Connect with us

ದಿನದ ಸುದ್ದಿ

ಬೆಳಗಾವಿ ನಮ್ಮದಾಗಿದೆ, ನಮ್ಮದಾಗಿಯೇ ಇರಲಿದೆ : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : 1948ರ ಜನವರಿ 30 ರಂದು ಮಹಾತ್ಮ ಗಾಂಧಿಯವರ ಹತ್ಯೆಯಾಯಿತು. ಅಂದಿನಿಂದ ಈ ದಿನವನ್ನು ಹುತಾತ್ಮ ದಿನವಾಗಿ ಆಚರಣೆ ಮಾಡಲಾಗುತ್ತಿದೆ. ಈ ಹುತಾತ್ಮ ದಿನದಂದು ಗಾಂಧೀಜಿಯವರನ್ನಷ್ಟೇ ಅಲ್ಲ, ದೇಶಕ್ಕಾಗಿ ತ್ಯಾಗ ಬಲಿದಾನಗೈದ ಪ್ರತಿಯೊಬ್ಬರನ್ನು ಸ್ಮರಿಸಿ, ಗೌರವಿಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 190ನೇ ಹುತಾತ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧಿಯವರಾಗಲೀ, ಸಂಗೊಳ್ಳಿ ರಾಯಣ್ಣನೇ ಆಗಲಿ ಅಧಿಕಾರದ ಆಸೆಗಾಗಿ, ಸ್ವಾರ್ಥ ಸಾಧನೆಗಾಗಿ ಹೋರಾಟ ಮಾಡಿದವರಲ್ಲ. ದೇಶವನ್ನು ಬ್ರಿಟಿಷರ ಅಧೀನದಿಂದ ಸ್ವತಂತ್ರಗೊಳಿಸಬೇಕು ಎಂಬ ಏಕೈಕ ಉದ್ದೇಶದೊಂದಿಗೆ ಹೋರಾಡಿದರು, ಹೋರಾಟದ ಹಾದಿಯಲ್ಲೇ ಪ್ರಾಣಾರ್ಪಣೆ ಮಾಡಿದರು ಎಂದರು.

ಸ್ವಾತಂತ್ರ್ಯ ಹೋರಾಟದ ರೀತಿಯಲ್ಲೆ ನೆಲ, ಜಲ, ಭಾಷೆಗಾಗಿ ಕನ್ನಡಪರ ಸಂಘಟನೆಗಳು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ. ನಾಡಿನ ಎಲ್ಲ ಕನ್ನಡಪರ ಸಂಘಟನೆಗಳಿಗೆ ನನ್ನ ಕೃತಜ್ಞತೆಗಳು. ರಾಯಣ್ಣನಂತಹ ನಾಡ ಪ್ರೇಮಿಗಳು ಇವರೆಲ್ಲರ ಹೋರಾಟಕ್ಕೆ ಇನ್ನಷ್ಟು ಸ್ಪೂರ್ತಿಯಾಗಲಿ ಎಂದು ಆಶಿಸುತ್ತೇನೆ.

ತಮ್ಮ ರಾಜಕೀಯ ಉಳಿವಿಗಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಪ್ರಸಂಗತನದ ಮಾತುಗಳನ್ನು ಆಡುತ್ತಾರೆ. ಮಹಾಜನ್ ವರದಿಯ ಪ್ರಕಾರ ಬೆಳಗಾವಿ ನಮ್ಮದಾಗಿದೆ, ನಮ್ಮದಾಗಿಯೇ ಇರಲಿದೆ. ಒಮ್ಮೆ ಇತ್ಯರ್ಥವಾದ ವಿಚಾರವನ್ನು ಮತ್ತೆ ವಿವಾದ ಮಾಡಲು ಯತ್ನಿಸಿದರೆ ಅದು ಖಂಡನೀಯ ಎಂದು ಕಿಡಿಕಾರಿದರು.

1983ರಲ್ಲಿ ನಾನು ಪಕ್ಷೇತರ ಶಾಸಕನಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದೆ, ಅಂದಿನ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆಯವರು ಕನ್ನಡ ಕಾವಲು ಸಮಿತಿಯನ್ನು ರಚನೆ ಮಾಡಿ, ಆ ಸಮಿತಿಯ ಪ್ರಥಮ ಅಧ್ಯಕ್ಷನಾಗಿ ನನ್ನನ್ನು ನೇಮಕ ಮಾಡಿದ್ದರು. ಒಂದು ವರ್ಷಕ್ಕೂ ಹೆಚ್ಚು ಕಾಲ ರಾಜ್ಯಾದ್ಯಂತ ಸಂಚರಿಸಿ, ಸಾಕಷ್ಟು ಕೆಲಸ ಮಾಡಿದ್ದೆ.

ಮಾತೃಭಾಷೆಯ ಬಗ್ಗೆ ಅಭಿಮಾನವಿರಬೇಕೇ ಹೊರತು ದುರಾಭಿಮಾನವಿರಬಾರದು. ಕನ್ನಡಿಗರಲ್ಲಿ ಸ್ವಲ್ಪ ಔದಾರ್ಯ ಗುಣ ಹೆಚ್ಚು, ಹೀಗಾಗಿಯೇ ಇಲ್ಲಿರುವ ತಮಿಳರ ಜೊತೆ ತಮಿಳಲ್ಲಿ, ಹಿಂದಿ ಮಾತನಾಡುವವರ ಜೊತೆ ಕನ್ನಡಿಗರಾದ ನಾವೇ ಹಿಂದಿಯಲ್ಲಿ ವ್ಯವಹರಿಸುತ್ತೇವೆ. ಇದರಿಂದ ನಷ್ಟವಾಗುತ್ತಿರುವುದು ಕನ್ನಡ ಭಾಷೆಗೆ ಎಂಬುದನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕು‌ ಎಂದರು.

ಕನ್ನಡ ನಾಡಿನಲ್ಲಿ ವಾಸ ಮಾಡುತ್ತಿರುವ ಪ್ರತಿಯೊಬ್ಬನು ಕನ್ನಡಿಗನೆ. ಯಾರೆಲ್ಲ ಹೊರ ರಾಜ್ಯಗಳಿಂದ ಬಂದು ಇಲ್ಲಿ ನೆಲೆ ನಿಂತಿದ್ದಾರೆ, ಅವರು ಕನ್ನಡ ಕಲಿಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣ ಮಾಡಿದಾಗ ಮಾತ್ರ ಭಾಷೆಯ ಬಳಕೆ ಹೆಚ್ಚಾಗಲಿದೆ. ಭಾಷೆಯೊಂದು ಹೆಚ್ಚೆಚ್ಚು ಬಳಕೆಯಾದಾಗ ಮಾತ್ರ ಬೆಳೆಯಲು ಸಾಧ್ಯ.

ಕಿತ್ತೂರು ಸಂಸ್ಥಾನದ ಸೈನ್ಯದಲ್ಲಿ ಒಬ್ಬ ಸಾಮಾನ್ಯ ಸೈನಿಕನಾಗಿದ್ದ ಸಂಗೊಳ್ಳಿ ರಾಯಣ್ಣ, ಇಂದು ಮಹಾನ್ ವ್ಯಕ್ತಿಯಾಗಿ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯಲು ಆತನಲ್ಲಿದ್ದ ದೇಶಪ್ರೇಮ, ಸ್ವಾಮಿನಿಷ್ಠೆ ಕಾರಣ. ಅವರ ತ್ಯಾಗ, ಬಲಿದಾನವನ್ನು ಈ ದಿನ ನಾವೆಲ್ಲ ಅತ್ಯಂತ ಗೌರವದಿಂದ ಸ್ಮರಿಸೋಣ.

ರಾಯಣ್ಣನಂತೆ ಸಾಕಷ್ಟು ಮಂದಿ ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಅವರೆಲ್ಲರನ್ನು ಸಮಾನವಾಗಿ ಗೌರವಿಸಬೇಕು. ಅದು ಗಾಂಧೀಜಿಯಿರಲೀ, ಭಗತ್ ಸಿಂಗ್ ಇರಲೀ, ಟಿಪ್ಪು ಸುಲ್ತಾನನಿರಲಿ. ಇತಿಹಾಸವನ್ನು ಇತಿಹಾಸವಾಗಿ ನೋಡಬೇಕೇ ವಿನಃ ಧರ್ಮದ ಕನ್ನಡಕದಿಂದಲ್ಲ. ಇತಿಹಾಸ ತಿರುಚುವ ಪ್ರಯತ್ನ ಮಾಡಿದರೆ ಅದು ದೇಶದ್ರೋಹವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರ್ಮವೆಂದರೆ ವ್ಯಕ್ತಿಯೊಬ್ಬನ ಜೀವನಶೈಲಿ. ಇನ್ನೊಬ್ಬರಿಗೆ ಕೇಡು ಬಯಸದಿರುವುದೇ ನಿಜವಾದ ಧರ್ಮ.
ಹುಟ್ಟುತ್ತಾ ಪ್ರತಿ ಮಗುವು ವಿಶ್ವಮಾನವನಾಗಿಯೇ ಹುಟ್ಟುತ್ತದೆ,
ಬೆಳೆಯುತ್ತಾ ಸಮಾಜ ಆತನನ್ನು ಅಲ್ಪಮಾನವನಾಗಿಸುತ್ತದೆ ಎಂದು ಕುವೆಂಪು ಹೇಳಿದ್ದಾರೆ. ಹಾಗಾಗಿ ನಮ್ಮೆಲ್ಲರ ಪ್ರಯತ್ನ ಸದಾ ವಿಶ್ವಮಾನವತ್ವದ ಕಡೆಗೆ ಇರಬೇಕು.

ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹಾತ್ಮ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ, ಸಂಗೊಳ್ಳಿ ರಾಯಣ್ಣ ಮುಂತಾದವರಿಂದ ಸ್ಪೂರ್ತಿ ಪಡೆದು, ಅವರು ಸಾಗಿದ ಹಾದಿಯಲ್ಲಿ ನಾವು ಸಾಗಬೇಕು. ಅದು ಮಹಾನ್ ವ್ಯಕ್ತಿಗಳಿಗೆ ನಾವು ಸಲ್ಲಿಸುವ ನಿಜವಾದ ಗೌರವವಾಗುತ್ತದೆ‌ ಎಂದರು

ಈ ವೇಳೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕ.ರಾ.ವೇ ಯ ಅಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending