ದಿನದ ಸುದ್ದಿ
ಭದ್ರಾ ಮೇಲ್ದಂಡೆ ಯೋಜನೆಗೆ 16 ಸಾವಿರ ಕೋಟಿ ಅನುದಾನ : ಸಿಎಂ ಬೊಮ್ಮಾಯಿ
ಸುದ್ದಿದಿನ,ದಾವಣಗೆರೆ : ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು ಮೇ ತಿಂಗಳಲ್ಲಿ ಕೇಂದ್ರ ಸಂಪುಟ ಇದಕ್ಕೆ ಒಪ್ಪಿಗೆ ನೀಡಲಿದೆ. ಇದರಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ರೂ. 16 ಸಾವಿರ ಕೋಟಿ ಅನುದಾನ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತಿಳಿಸಿದರು.
ಜಗಳೂರು ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ಶುಕ್ರವಾರ ಏರ್ಪಡಿಸಲಾದ ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವುದು ಹಾಗೂ 18 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಹಾಗೂ ಇತರೆ ಕಾಮಗಾರಿಗಳು ಸೇರಿ 1383.10 ಕೋಟಿ ಮೌಲ್ಯದ 19 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ರೂ.21.05 ಕೋಟಿ ಮೌಲ್ಯದ 18 ಕಾಮಗಾರಿಗಳಿಗೆ ಉದ್ಘಾಟನೆ ನೆರವೇರಿಸಿದರು. ಮತ್ತು ಸುಮಾರು 12 ಇಲಾಖೆಗಳಿಂದ 1248 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಸಾಂಕೇತಿಕವಾಗಿ ವಿತರಣೆ ಮಾಡಿ ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆಯಿಂದ ಮುಂಬರುವ ದಿನಗಳಲ್ಲಿ ಬರಡು ನಾಡಾಗಿದ್ದ ಜಗಳೂರನ್ನು ಜಲನಾಡಾಗಿ ಪರಿವರ್ತನೆ ಮಾಡಲಾಗುತ್ತಿದೆ. ಜಗಳೂರು ತಾಲ್ಲೂಕಿನಾದ್ಯಂತ 40 ಸಾವಿರ ಎಕೆರೆ ಪ್ರದೇಶಕ್ಕೆ ಹನಿ ನೀರಾವರಿ ಸೌಲಭ್ಯ ಒದಗಿಸಲಾಗಿದ್ದು, ಈ ಯೋಜನೆಯಿಂದ 9 ಕೆರೆಗಳನ್ನು ತುಂಬಿಸಲಾಗುತ್ತದೆ.
ಜಗಳೂರು ತಾಲ್ಲೂಕಿನ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮುಕ್ತಾಯವಾಗಿದ್ದು ಜೂನ್ ಅಥವಾ ಜುಲೈನಲ್ಲಿ ಎಲ್ಲ ಕೆರೆಗಳಿಗೆ ನೀರನ್ನು ತುಂಬಿಸಲಾಗುವುದು. ನೀರಾವರಿಯ ಕ್ರಾಂತಿಯನ್ನು ಮಧ್ಯ ಕರ್ನಾಟಕದ ಜಗಳೂರಿನಲ್ಲಿ ಮಾಡಲಾಗುತ್ತದೆ ಎಂದು ಹೇಳಿದರು.
ಜಗಳೂರು ಅತ್ಯಂತ ಬರ ಪೀಡಿತ ತಾಲ್ಲೂಕು ಆಗಿದ್ದು, ಈ ಪ್ರದೇಶದಲ್ಲಿ ಕೆರೆ ತುಂಬಿಸುವ ಮತ್ತು ನೀರಾವರಿ ಯೋಜನೆಗಳ ಕನಸು ಮರೀಚಿಕೆಯಾಗಿತ್ತು. ಯಡಿಯೂರಪ್ಪ ನೇತೃತ್ವದ ಸರ್ಕಾರಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಈ ಭಾಗದಲ್ಲಿ ಕೃಷಿ ಚಟುವಟಿಕೆಗಳು ರೈತರ ಜೀವನವನ್ನು ಹಸನಾಗಿಸಲು ಸಹಕಾರಿಯಾಗಿದೆ ಎಂದು ಸ್ಮರಿಸಿದರು.
ಬಜೆಟ್‍ನಲ್ಲಿ ಈ ವರ್ಷ ರಾಜ್ಯ ಸರ್ಕಾರ ರೂ. 20 ಸಾವಿರ ಕೋಟಿಗಿಂತ ಹೆಚ್ಚು ಅನುದಾನವನ್ನು ನೀರಾವರಿ ಯೋಜನೆಗಳಿಗೆ ನೀಡಲಾಗಿದೆ. ನೀರಾವರಿ ಯೋಜನೆ ಜೊತೆಗೆ ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಕೈಗಾರಿಕಾ ಕ್ರಾಂತಿ ಮಾಡುವುದರ ಮೂಲಕ ಮಧ್ಯ ಕರ್ನಾಟಕದ ಭವ್ಯ ಭವಿಷ್ಯವನ್ನು ನಮ್ಮ ಸರ್ಕಾರ ನನಸು ಮಾಡುತ್ತದೆ ಎಂದರು.
ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಮಾತನಾಡಿ, ಸರ್ಕಾರ ಬಯಲುಸೀಮೆ ಪ್ರದೇಶದ ರೈತರ ಅಭಿವೃದ್ಧಿ ಹಾಗೂ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಜಗಳೂರು, ಹೊಳಲ್ಕೆರೆ, ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಿಗೆ ನೀರಾವರಿ ಯೋಜನೆ ರೂಪಿಸಲು ಕ್ರಮ ಕೈಗೊಂಡಿದೆ. ಜಗಳೂರಿನ ಇತಿಹಾಸದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡಬೇಕಾದ ಇಲ್ಲಿನ ಜನರ ಬಹುದಿನದ ಕನಸು ಭದ್ರಾ ಮೇಲ್ದಂಡೆ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ಹೇಳಿದರು.
ಜಲ ಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ ಮಾತನಾಡಿ, ಜಗಳೂರು ತಾಲ್ಲೂಕಿನ ಹಳ್ಳಿಗಳಿಗೆ ಕುಡಿಯುವ ನೀರು ಮತ್ತು ರೈತರ ಬೆಳೆಗಳಿಗೆ ನೀರು ಒದಗಿಸುವ ಉದ್ದೇಶದಿಂದ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯದ ಎಲ್ಲಾ ನೀರಾವರಿ ಅಚ್ಚುಕಟ್ಟು ಪ್ರದೇಶದಲ್ಲಿ ಕೊನೆಯ ಭಾಗದ ರೈತರಿಗೂ ನೀರು ಒದಗಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ.
ರೈತರು ಅವೈಜ್ಞಾನಿಕವಾಗಿ ನೀರಿನ ಬಳಕೆ ಕಡಿಮೆ ಮಾಡಬೇಕು, ವೈಜ್ಞಾನಿಕ ದೃಷ್ಟಿಕೋನದಿಂದ ನೀರನ್ನು ಬಳಸಬೇಕು. ರೈತರ ಬದುಕು ಹಸನಾಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತರಿಗೆ 10 ಸಾವಿರ ರೂಪಾಯಿಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದೇಶದಾದ್ಯಂತ ವಿವಿಧ ಅಭಿವೃದ್ಧಿ ಕೆಲಸಗಳು ಹಾಗೂ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸುತ್ತವೆ ಎಂದರು.
ದಾವಣಗೆರೆ ಲೋಕಸಭಾ ಸದಸ್ಯರಾದ ಡಾ. ಜಿ. ಎಂ ಸಿದ್ದೇಶ್ವರ ಮಾತನಾಡಿ, ಜಿಲ್ಲೆಯಲ್ಲಿ ಜಗಳೂರು ತಾಲ್ಲೂಕಿನ ಜನರು ಉದ್ಯೋಗ ಹರಸಿ ಹೆಚ್ಚು ವಲಸೆ ಹೋಗುತ್ತಾರೆ. ಹಾಗಾಗಿ ಬರದನಾಡು ಎಂಬುದನ್ನು ತೆಗೆದುಹಾಕಿ ನೀರಾವರಿ ಪ್ರದೇಶವಾಗಿ ಮಾಡಿ 1.5 ವರ್ಷದಲ್ಲಿ 09 ಕೆರೆಗಳಿಗೆ ನೀರು ತುಂಬಿಸಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಗಳೂರು ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರಪ್ಪ ಮಾತನಾಡಿ ಇಲ್ಲಿನ ರೈತರು ನೀರಾವರಿ ಸೌಲಭ್ಯಗಳಿಲ್ಲದೆ ಆಕಾಶ ನೋಡಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬೇಕಾಗಿತ್ತು. ಆದರೆ ಭದ್ರಾ ಮೇಲ್ದಂಡೆ ಯೋಜನೆಯಿಂದ ತಾಲ್ಲೂಕು ಹಸಿರುದಾಪುಗಾಲಿಟ್ಟಿದೆ. ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಸಮಗ್ರ ನೀರಾವರಿ ಯೋಜನೆಗಳನ್ನು ನೀಡಲಾಗಿದೆ. ಇಲ್ಲಿಗೆ ಒಂದು ಬೈಪಾಸ್ ರಸ್ತೆ ಹಾಗೂ ಕೆ.ಎಸ್.ಆರ್.ಟಿ.ಸಿ.ಯಿಂದ ಡಿಪೋ ಬೇಕಾಗಿದ್ದು ಇವುಗಳನ್ನು ಸರ್ಕಾರ ಮುಂದಿನ ದಿನಗಳಲ್ಲಿ ಈಡೇರಿಸುವ ಭರವಸೆ ಇದೆ ಎಂದರು.
ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಬೃಹತ್ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿಯವರು. ಹೊನ್ನಾಳಿ ಶಾಸಕರು ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಚನ್ನಗಿರಿ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮರ್ಜಕ ನಿಯಮಿತ ಅಧ್ಯಕ್ಷರಾದ ಮಾಡಾಳು ವಿರೂಪಾಕ್ಷಪ್ಪ, ವಿಧಾನಪರಿಷತ್ ಸದಸ್ಯರಾದ ರವಿಕುಮಾರ್.ಎನ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಬಳ್ಳಾರಿ ಸಂಸದರಾದ ವೈ.ದೇವೇಂದ್ರಪ್ಪ, ಮಾಯಕೊಂಡ ಶಾಸಕರು ಹಾಗೂ ಡಾ; ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪ್ರೊ; ಎನ್.ಲಿಂಗಣ್ಣ, ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕರಾದ ಡಾ.ವೈ.ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಾ.ಎ.ಚನ್ನಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಸ್.ಸಿದ್ದಪ್ಪ, ಉಪಾಧ್ಯಕ್ಷೆ ಮಂಜಮ್ಮ ಬಿ.ಮಂಜಣ್ಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


