ದಿನದ ಸುದ್ದಿ
ಮರ ಕಡಿಯಲು ಬಂದರೆ, ಮರದ ಬಳಿಯೇ ಮಲಗುತ್ತೇವೆ : ಸಾಲುಮರದ ತಿಮ್ಮಕ್ಕ

ಸುದ್ದಿದಿನ,ಬೆಂಗಳೂರು: ಮಾಗಡಿ ತಾಲೂಕಿನ ಹುಲಿಕಲ್ಲು ಬಳಿ ರಸ್ತೆ ಅಗಲೀಕರಣಕ್ಕಾಗಿ, ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ನೆಟ್ಟಿದ್ದ ಮರಗಳನ್ನ ಕಡಿಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಲು ಮರದ ತಿಮ್ಮಕ್ಕ ಇಂದು ಸಿಎಂ ಹಾಗೂ ಡಿಸಿಎಂ ರನ್ನ ಭೇಟಿಯಾಗಿ ಮರಗಳನ್ನ ಕಡಿಯದಂತೆ ಮನವಿ ಮಾಡಿದ್ದಾರೆ.
ನೂರಾರು ಮರಗಳನ್ನ ನೆಟ್ಟು ಮಕ್ಕಳಂತೆ ಬೆಳೆಸಿದ್ದೇನೆ. ಆದ್ರೆ ಇದೀಗ ಹೆದ್ದಾರಿ ಅಭಿವೃದ್ಧಿಗಾಗಿ ಆ ಮರಗಳಿಗೆ ಕೊಡಲಿ ಹಾಕಲು ಮುಂದಾಗಿದ್ದಾರೆ. ದಯವಿಟ್ಟು ಮರಗಳನ್ನ ಕಡಿಯಬೇಡಿ ಅಂತಾ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಬಳಿ ಮನವಿ ಮಾಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ತಿಮ್ಮಕ್ಕ, ನಾವು ಯಾವ ಕಾರಣಕ್ಕೂ ಮರಗಳನ್ನ ಕಡಿಯಲು ಬಿಡುವುದಿಲ್ಲ. ಕಡಿಯಲು ಬಂದ್ರೆ ನಾನು, ನನ್ನ ಮಗ ಮರದ ಬಳಿಯೇ ಮಲಗುತ್ತೇವೆ. ಮರ ಕಡಿಯೋಕೆ ಬಂದ್ರೆ ಸುಮ್ಮನಿರಲ್ಲ. ಸಿಎಂ, ಡಿಸಿಎಂ ಕೂಡಾ ಮರಗಳನ್ನ ಕಡಿಸುವುದಿಲ್ಲ ಅಂತ ಭರವಸೆ ನೀಡಿದ್ದಾರೆ
ಇನ್ನು ಇದಕ್ಕೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವ ಸಿಎಂ ಕುಮಾರಸ್ವಾಮಿ, ತಕ್ಷಣವೇ ದೂರವಾಣಿ ಮೂಲಕ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಸೂಚನೆ ನೀಡಿದ್ದಾರೆ. ಅಗತ್ಯ ಬಿದ್ದಲ್ಲಿ ರಸ್ತೆ ಮಾರ್ಗವನ್ನೇ ಬದಲಿಸುವಂತೆ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
