ದಿನದ ಸುದ್ದಿ
ದಾವಣಗೆರೆ : ಕವಿ ಸಿ.ಕೃಷ್ಣ ನಾಯಕ್ರ ‘ನುಡಿಯ ಬೆರಗು’ ಕೃತಿ ಲೋಕಾರ್ಪಣೆ

ಸುದ್ದಿ್ದಿನ,ದಾವಣಗೆರೆ : ಲೇಖನ, ಬರಹಗಳು ಓದುಗರನ್ನು ಚಿಂತನೆಗೆ ಹಚ್ಚುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕು ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಜಿ.ಕಾವ್ಯಶ್ರೀ ಆಶಿಸಿದರು.
ನಗರದ ರೋಟರಿ ಬಾಲಭವನದಲ್ಲಿ ಭಾನುವಾರ ನವಜ್ಯೋತಿ ಸಾಂಸ್ಕೃತಿಕ ಸೇವಾಸಂಸ್ಥೆ, ಹರಪನಹಳ್ಳಿ, ಪ್ರಗತಿಪರ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯ ಮಂಡಳ, ದಾವಣಗೆರೆ ಇದರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕವಿ ಸಿ.ಕೃಷ್ಣ ನಾಯಕ್ರ ನುಡಿಯ ಬೆರಗು ಕೃತಿಯನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
ಸಾಹಿತ್ಯ ಕೃತಿಗಳು ಓದುಗರೊಂದಿಗೆ ಸಂವಾದ ಮಾಡಬೇಕು. ಓದುಗರ ಮನಸ್ಸಿನಲ್ಲಿ ಚರ್ಚೆ, ಚಿಂತನೆ, ಆತ್ಮಾವಲೋಕನಕ್ಕೆ ಕಾರಣವಾಗಬೇಕು. ಓದುಗರ ಮನಸ್ಸಿನ ಮೇಲೆ ಪ್ರಭಾವ ಬೀರುವ ಮೂಲಕ ಸಾಮಾಜಿಕ ಪರಿವರ್ತನೆಗೆ ಕಾರಣವಾಗಬೇಕು. ಅಂತಹ ಕೃತಿಗಳು ಮಾತ್ರವೇ ಸಮಾಜದಲ್ಲಿ ಗೌರವ, ಮಹತ್ವ ಪಡೆಯುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಕವಿ ಸಿ.ಕೃಷ್ಣ ನಾಯಕ್ ಹೊರತಂದಿರುವ ನುಡಿಯ ಬೆರಗು ಕೃತಿಯಲ್ಲಿರುವ 12 ಲೇಖನಗಳು ವೈವಿಧ್ಯಮಯ ಬರಹವನ್ನು ಹೊಂದಿವೆ. ಸಾರ್ವಕಾಲಿಕವಾದ ಜ್ವಲಂತ ಸಮಸ್ಯೆಗಳತ್ತ ಬೆಳಕು ಚೆಲ್ಲುತ್ತವೆ. ಬರಹಗಳಲ್ಲಿ ನಿಸರ್ಗದ ಬಗ್ಗೆ ಒಲವು, ಬದುಕಿನ ಬಗ್ಗೆ ಪ್ರೀತಿ, ನವಿರಾದ ಹಾಸ್ಯ, ಗದ್ಯಶೈಲಿಯಲ್ಲಿ ಸ್ಪಷ್ಟತೆ ಎದ್ದು ಕಾಣುತ್ತದೆ. ಓದುಗರನ್ನು ಚಿಂತನೆಗೆ ಹಚ್ಚುವ ಹಪಾಹಪಿ ಇದೆ. ಕಲ್ಪನೆಗೆ ಅವಕಾಶ ಕೊಡದೆ, ಸಮಾಜದ ಸತ್ಯದರ್ಶನವನ್ನು ಲೇಖಕರು ಪ್ರಾಮಾಣಿಕ ಅನುಭವದ ಹಿನ್ನೆಲೆಯಲ್ಲಿ ವ್ಯಕ್ತಗೊಳಿಸಿದ್ದಾರೆ ಎಂದು ಅವರು ವಿಮರ್ಶಿಸಿದರು.
ಕೃತಿ ಕುರಿತು ಕವಿ ಮಲ್ಲಿಕಾರ್ಜುನಗೌಡ ತೂಲಹಳ್ಳಿ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಮೊಬೈಲ್, ಇಂಟರ್ನೆಟ್ ಹಾವಳಿಯಿಂದಾಗಿ ಸಾಹಿತ್ಯ ಓದುಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಸುಳ್ಳನ್ನು ನಂಬಿ, ಸುಲಭವಾಗಿ ದಕ್ಕುವುದನ್ನು ಆಯ್ಕೆ ಮಾಡುವ ಮನಃಸ್ಥಿತಿ ಯುವಜನತೆಯಲ್ಲಿ ಬೇರೂರಿದೆ. ಇಂತಹ ಯುವಜನರನ್ನು ಮತ್ತೆ ಸಾಹಿತ್ಯದ ಕಡೆಗೆ ಆಕರ್ಷಿಸುವ ಕೃತಿಗಳು ಹೊರಬರಬೇಕಿದೆ ಎಂದರು.
ಕನ್ನಡ ಭಾಷೆಯು ಕವಿರಾಜಮಾರ್ಗದಿಂದ ಹಿಡಿದು ಇತ್ತೀಚಿನ ಆಧುನಿಕ ಸಾಹಿತ್ಯದವರೆಗೆ ಸಮಾಜಕ್ಕೆ ಸತ್ವ ಕೊಟ್ಟಿರುವ ಭಾಷೆಯಾಗಿದೆ. ಪಂಪ, ರನ್ನ ಆದಿಯಾಗಿ ವಚನಕಾರರು, ದಾಸ ಪರಂಪರೆಯವರು, ಕುವೆಂಪು, ದ.ರಾ.ಬೇಂದ್ರೆಯಂತಹವರು ಸಹ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದ್ದರು. ಆದರೆ ಇಂದು ಎಲ್ಲಾ ವಿಷಯಕ್ಕೂ ತಣ್ಣನೆಯ ಪ್ರತಿಕ್ರಿಯೆ ನೀಡುವ ಬೌದ್ಧಿಕ ದಾರಿದ್ರ್ಯ ನಮ್ಮನ್ನು ಆವರಿಸಿದೆ. ಇಂತಹ ಸಂದರ್ಭದಲ್ಲಿ ಲೇಖಕರು ಓದುಗರನ್ನು ಯಾವ ದಿಕ್ಕಿಗೆ ಕೊಂಡೊಯ್ಯಬೇಕು ಎಂಬುದರ ಬಗ್ಗೆ ಗಂಭೀರ ಚಿಂತನೆಯಾಗಬೇಕು ಎಂದು ಅವರು ಸೂಚ್ಯವಾಗಿ ಹೇಳಿದರು.
ವಿಶ್ರಾಂತ ಪ್ರಾಚಾರ್ಯ ಡಾ.ನಾ.ಲೋಕೇಶ ಒಡೆಯರ್ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿದ್ದರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆಡಳಿತಾಧಿಕಾರಿ ಹಾಗೂ ಕೃತಿಕಾರ ಸಿ.ಕೃಷ್ಣ ನಾಯಕ್, ಉಪನ್ಯಾಸಕ ಹರಪನಹಳ್ಳಿಯ ಹೆಚ್.ಮಲ್ಲಿಕಾರ್ಜುನ, ಪ್ರಗತಿಪರ ಸಾಹಿತ್ಯ ಪರಿಷತ್ತಿನ ಜಿ.ಮುದ್ದುವೀರಸ್ವಾಮಿ ಹಿರೇಮಳಲಿ, ಕಾವ್ಯ ಮಂಡಳದ ನಾಗರಾಜ ಸಿರಿಗೆರೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
