ದಿನದ ಸುದ್ದಿ
ಮಾಧ್ಯಮಗಳು ಸತ್ಯಾಸತ್ಯತೆ ತಿಳಿದು ಸುದ್ದಿ ಮಾಡಬೇಕು : ಕೆ.ಆರ್. ರಮೇಶ್ ಕುಮಾರ್

ಸುದ್ದಿದಿನ,ಕೋಲಾರ : ಪತ್ರಕರ್ತರು ಮಾಧ್ಯಮಗಳ ಮೂಲಕ ಸಮಾಜದಲ್ಲಿ ನಡೆಯುತ್ತಿರುವ ವಾಸ್ತವ ವಿಚಾರಗಳನ್ನು ಜನತೆಗೆ ತಿಳಿಯಪಡಿಸಬೇಕು ಎಂದು ವಿಧಾನಸಭಾಧ್ಯಕ್ಷರಾದ ಕೆ.ಆರ್ ರಮೇಶ್ ಕುಮಾರ್ ಅವರು ತಿಳಿಸಿದರು.
ಪತ್ರಕರ್ತರಿಗೆ ವೃತ್ತಿ ಧರ್ಮ ಬಹಳ ಮುಖ್ಯ.
ಸುದ್ದಿಯು ಸತ್ಯಕ್ಕೆ ದೂರ ಇದ್ದಾಗ ಸುದ್ದಿಯು ಮಹತ್ವ ಕಳೆದುಕೊಳ್ಳುತ್ತದೆ. ಆದ್ದರಿಂದ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿದು ವಾಸ್ತವವನ್ನು ಸುದ್ದಿ ಮಾಡಬೇಕು. ತಪ್ಪು ಸುದ್ದಿಯಿಂದ ನಿರಪರಾಧಿಗಳ ಚಾರಿತ್ಯ್ರವಧೆಯಾಗಬಾರದು ಹಾಗೂ ಸತ್ಯವನ್ನು ಮರೆಮಾಚಬಾರದು. ನಮ್ಮ ಮುಂದೆ ಯಾವ ದೊಡ್ಡ ವ್ಯಕ್ತಿಯ ವಿಚಾರ ಬಂದರೂ ವಿಷಯವು ಮಾತ್ರ ಮುಖ್ಯವಾಗಿರಬೇಕು ವ್ಯಕ್ತಿಯನ್ನು ಪರಿಗಣಿಸಬಾರದು. ಸ್ವೇಚ್ಚಾಚಾರ ಹಾಗೂ ಸ್ವಾತಂತ್ರ್ಯಕ್ಕೆ ತುಂಬಾ ವ್ಯತ್ಯಾಸವಿದೆ ಎಂದ ಪತ್ರಕರ್ತರ ನಿವೇಶನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಭೆ ಕರೆದು ಸರ್ಕಾರಿ ಜಾಗ ಅಥವಾ ಖಾಸಗಿ ಸ್ಥಳವನ್ನು ಗುರ್ತಿಸಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಇಂದು ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಕರ್ತರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಮೊದಲ ಪತ್ರಿಕೆ ಮಂಗಳೂರು ಸಮಾಚಾರ್, 1843 ರಲ್ಲಿ ಪ್ರಾರಂಭವಾಯಿತು. ಮನುಷ್ಯ ಶಿಲಾಯುಗವನ್ನು ದಾಟಿ ನಾಗರೀಕ ಜಗತ್ತಿಗೆ ತಲುಪಿದಾಗ ತನ್ನನ್ನು ಪರಿಚಯಿಸಿಕೊಳ್ಳಲು ಇನ್ನೊಬ್ಬರನ್ನು ಅರ್ಥೈಸಲು ಹಾಗೂ ಭಾವನೆಗಳನ್ನು ಒಬ್ಬರಿಂದ ಮತ್ತೊಬ್ಬರಿಗೆ ವಿನಿಮಯ ಮಾಡಿಕೊಳ್ಳಲು ಭಾಷೆ ಅಸ್ತಿತ್ವಕ್ಕೆ ಬಂದಿತು ಎಂದು ತಿಳಿಸಿದರು.
ಕೆಲವು ವರ್ಷಗಳ ಕಾಲಘಟ್ಟದಲ್ಲಿ ದೂರದಲ್ಲಿರುವ ಮನುಷ್ಯನಿಗೆ ವಿಚಾರಗಳನ್ನು ತಲುಪಿಸುವುದಕ್ಕೆ ಭಾಷೆಯ ವಿಚಾರಗಳನ್ನು ತಿಳಿಸಲು ಗಿಳಿ, ಪಾರಿವಾಳಗಳ ಮುಖಾಂತರ ಪತ್ರಗಳನ್ನು ರವಾನೆ ಮಾಡುತ್ತಿದ್ದರು. ನಂತರ ದಿನಗಳಲ್ಲಿ ಗ್ರಾಮ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮ ನೌಕರರು ಕಾರ್ಯನಿರ್ವಹಿಸುತ್ತಿದ್ದರು. ಇಂದು ಪ್ರತಿದಿನದ ಸಮಾಚಾರಗಳನ್ನು ತಿಳಿಸಲು ವರ್ತಮಾನ ಪತ್ರಿಕೆಗಳು ಹೆಚ್ಚು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಾತನಾಡಿ, ಪತ್ರಿಕಾ ಮಾಧ್ಯಮ ಹಾಗೂ ಪತ್ರಕರ್ತ ವೃತ್ತಿಗೆ ತನ್ನದೆ ಆದ ಇತಿಹಾಸವಿದೆ. ಸ್ವತಂತ್ರ್ಯ ಪೂರ್ವದಲ್ಲಿ ಪತ್ರಿಕೆಗಳ ಪಾತ್ರ ಬಹಳ ಮುಖ್ಯವಾದದ್ದು. ಅಭಿವೃದ್ಧಿ ಆಧಾರದ ಪತ್ರಿಕೋದ್ಯಮದ ಇಂದು ಕಡೆಗಣಿಸುತ್ತಿದ್ದು, ಕ್ಷಣ ಕ್ಷಣದ ಮಾಹಿತಿಯನ್ನು ನೀಡುವ ಪೈಪೋಟಿಯ ಕಾಲವಾಗಿದೆ. ಪ್ರಚೋದನಾಕಾರಿ ವಿಷಯಗಳನ್ನು ಪ್ರಕಟಿಸಿದಾಗ ವಿದ್ಯುನ್ಮಾನ ಚಾನಲ್ಗಳ ಟಿ.ಆರ್.ಪಿ ಹಾಗೂ ಪತ್ರಿಕೆಗಳ ಸರಬರಾಜು ಹೆಚ್ಚಾಗುತ್ತಿದೆ ಎಂಬ ದೃಷ್ಟಿಕೋನ ಇಂದಿನದ್ದಾಗಿದೆ ಎಂದು ತಿಳಿಸಿದರು.
ಪ್ರಜ್ಞಾಪೂರ್ವಕವಾಗಿ ಎಚ್ಚೆತ್ತು ಕಾರ್ಯನಿರ್ವಹಿಸಿದರೆ ವ್ಯಕ್ತಿ ಸ್ವಾತಂತ್ರ್ಯ ಹಾಗೂ ಪತ್ರಿಕಾ ಸ್ವಾತಂತ್ರ್ಯವನ್ನು ಕಾಪಾಡಬಹುದಾಗಿದೆ. ಸಮಾಜದಲ್ಲಿನ ಒಳ್ಳೆಯ ವಿಚಾರಗಳು ಸಾರ್ವಜನಿಕರಿಗೆ ತಲುಪಿಸುವುದು ಪತ್ರಕರ್ತರ ಜವಾಬ್ದಾರಿಯಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪತ್ರಿಕಾ ರಂಗದಲ್ಲಿ ಸಾಧನೆ ಮಾಡಿದ ಪತ್ರಕರ್ತರಿಗೆ ಸನ್ಮಾನ ಮಾಡಲಾಯಿತು. ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಮತ್ತು ಪದವಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಚಿವರಾದ ಹೆಚ್.ನಾಗೇಶ್, ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಶ್ರೀನಿವಾಸಗೌಡ, ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ.ಜಗದೀಶ್, ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಾಹ್ನವಿ, ನಿಕಟಪೂರ್ವ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗಣೇಶ್, ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಗೋಪಿನಾಥ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿ. ಮುನಿರಾಜು ಸೇರಿದಂತೆ ಜಿಲ್ಲೆಯ ಪತ್ರಕರ್ತರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
