ದಿನದ ಸುದ್ದಿ
ಟಿಪ್ಪು ಜಯಂತಿ ರದ್ದು | ಬಿಜೆಪಿ ನಾಯಕರು ಇತಿಹಾಸದ ಅರಿವಿಲ್ಲದ ಮೂಢರು : ಸಿದ್ದರಾಮಯ್ಯ ಕಿಡಿ

ಸುದ್ದಿದಿನ, ಬೆಂಗಳೂರು : ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿರುವುದು ಅಪರಾಧ. ಟಿಪ್ಪು ಸುಲ್ತಾನ್ ಬ್ರಿಟೀಷರ ವಿರುದ್ಧ ಹೋರಾಡುತ್ತಲೇ ವೀರಮರಣ ಹೊಂದಿದ ಹುತಾತ್ಮ. ಕೋಮುವಾದವನ್ನೇ ತಲೆಯಲ್ಲಿ ತುಂಬಿಕೊಂಡಿರುವ ಬಿಜೆಪಿ ನಾಯಕರು ಇತಿಹಾಸದ ಅರಿವಿಲ್ಲದ ಮೂಢರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಟಿಪ್ಪು ಸುಲ್ತಾನ್ ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ. ನಾಡಿಗಾಗಿ ಮಕ್ಕಳನ್ನೇ ಒತ್ತೆ ಇಟ್ಟ ಅಪ್ರತಿಮ ದೇಶಭಕ್ತ. ಸ್ವಾತಂತ್ರ್ಯ ಹೋರಾಟದಲ್ಲಿಯೇ ಭಾಗವಹಿಸದ ಸಂಘ ಪರಿವಾರಕ್ಕೆ ಇದೆಲ್ಲ ಅರ್ಥವಾಗುವ ವಿಷಯ ಅಲ್ಲ. ಟಿಪ್ಪು ಸುಲ್ತಾನ್ ಒಂದು ಧರ್ಮಕ್ಕೆ ಸೇರಿದವರಲ್ಲ. ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಸೇರಿರುವ ಆಸ್ತಿ. ಈ ಕಾರಣಕ್ಕಾಗಿಯೇ ಟಿಪ್ಪು ಜಯಂತಿ ಆಚರಣೆಯ ನಿರ್ಧಾರ ಕೈಗೊಂಡಿದ್ದೆ. ಜಾತಿ-ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆಯಲು ಹೊರಟಿರುವ ಬಿಜೆಪಿಯ ನಡೆ ಅನಿರೀಕ್ಷಿತವೇನಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಂದೆ ಬಿ.ಎಸ್.ಯಡಿಯೂರಪ್ಪನವರು ಕೈಯಲ್ಲಿ ಕತ್ತಿ ಹಿಡಿದು ಟಿಪ್ಪು ವೇಷ ಹಾಕಿ ಕುಣಿದಾಡುತ್ತಾ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದರು. ಈಗ ಸಂಘ ಪರಿವಾರವನ್ನು ಖುಷಿಪಡಿಸಲು ಟಿಪ್ಪು ಜಯಂತಿ ರದ್ದು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್| 9980346243

ದಿನದ ಸುದ್ದಿ
ಓಬವ್ವ ಆತ್ಮ ರಕ್ಷಣಾ ಕಲೆ ಕರಾಟೆ ಯೋಜನೆಗೆ 18 ಕೋಟಿ ರೂಪಾಯಿ ಮೀಸಲು

ಸುದ್ದಿದಿನ,ಯಾದಗಿರಿ : ರಾಜ್ಯ ವಸತಿ ಶಾಲೆಗಳ ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ರೂಪಿಸಿರುವ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯ ಅನುಷ್ಠಾನಕ್ಕಾಗಿ 18 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೆಂಡೆಬೆಂಬಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಕರಾಟೆ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ಕಲೆ ಅಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಆರಂಭಿಸಿದೆ. ಈಗಾಗಲೇ ಒಂದು ಸಾವಿರ ಕರಾಟೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಕ್ಕಳ ಕರಾಟೆ ಕಲೆ ಹಾಗೂ ಸಮವಸ್ತ್ರಕ್ಕಾಗಿ 18 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬಡವರು, ಆರ್ಥಿಕವಾಗಿ ಹಿಂದುಳಿದವರು, ಅಲೆಮಾರಿಗಳ ಮಕ್ಕಳೇ ವಿಶೇಷವಾಗಿ ಈ ವಸತಿ ಶಾಲೆಗಳಿಗೆ ದಾಖಲಾಗುತ್ತಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ವಸತಿ ಶಾಲೆಗಳನ್ನು ಮತ್ತುಷ್ಟು ಬಲಪಡಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
