ದಿನದ ಸುದ್ದಿ
ಆಲಮಟ್ಟಿ ಹಿನ್ನೀರಿನಿಂದ ಮಹಾರಾಷ್ಟ್ರಕ್ಕೆ ತೊಂದರೆಯಿಲ್ಲ, ನಮ್ಮ ರಾಜ್ಯಕ್ಕೆ ತೊಂದರೆಯಿದೆ : ಯಡಿಯೂರಪ್ಪ

ಸುದ್ದಿದಿನ, ಬೆಳಗಾವಿ: ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹಿಸಿದರೂ ಮಹಾರಾಷ್ಟ್ರದ ಜನರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದರು.ಜಿಲ್ಲೆಯ ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಚಿಕ್ಕೋಡಿಯ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ಹಿನ್ನೀರಿನಿಂದ ಮಹಾರಾಷ್ಟ್ರದ ಗಡಿ ಜಿಲ್ಲೆಗಳಾದ ಕೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ವರದಿಗಳು ಪ್ರಕಟವಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು. ಆಲಮಟ್ಟಿಯಿಂದ ಸಾಂಗ್ಲಿ ಹಾಗೂ ಕೊಲ್ಲಾಪುರ ಬಹಳ ದೂರದಲ್ಲಿವೆ. ಆದ್ದರಿಂದ ಈ ಜಲಾಶಯಗಳ ಹಿನ್ನೀರು ಆ ಜಿಲ್ಲೆಯ ವ್ಯಾಪ್ತಿಯವರೆಗೆ ನಿಲ್ಲುವುದಿಲ್ಲ.
ಆಲಮಟ್ಟಿ ಜಲಾಶಯದಲ್ಲಿ ಗರಿಷ್ಠ 123 ಟಿ.ಎಂ.ಸಿ ನೀರು ಸಂಗ್ರಹಿಸಬಹುದು. ಆದರೆ ಸದ್ಯಕ್ಕೆ ಕೇವಲ 85 ಟಿ ಎಂಸಿ ನೀರು ಮಾತ್ರ ಇದೆ. ಅದೇ ರೀತಿ ನಾರಾಯಣಪುರ ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ 33 ಟಿ.ಎಂ.ಸಿ. ಸದ್ಯ 18 ಟಿ ಎಂ.ಸಿ ಮಾತ್ರ ನೀರಿದೆ.
ಆಲಮಟ್ಟಿ ನೀರಿನಿಂದ ಅವರಿಗೆ ಅಪಾಯವಿಲ್ಲ; ನಮ್ಮ ರಾಜ್ಯಕ್ಕೇ ತೊಂದರೆಯಿದೆ
ನಮ್ಮ ಜಲಾಶಯಗಳಲ್ಲಿ ನೀರು ಸಂಗ್ರಹದಿಂದ ಮಹಾರಾಷ್ಟ್ರದ ಜನರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಮ್ಮಿಂದ ಅವರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಮಹಾರಾಷ್ಟ್ರದ ಸಿಎಂ ಜತೆ ಈಗಾಗಲೇ ಈ ಬಗ್ಗೆ ಮೂರು ಬಾರಿ ಚರ್ಚೆ ಮಾಡಿದ್ದೇನೆ. ಅಲ್ಲಿನ ಕೆಲ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಪ್ರಕಟವಾಗುತ್ತಿರುವುದರಿಂದ ಮತ್ತೆ ಸ್ಪಷ್ಟನೆ ನೀಡುತ್ತಿದ್ದೇನೆ ಎಂದರು.
ಐದು ಸಾವಿರ ಕೋಟಿ ಅಗತ್ಯ
ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿಯಿಂದ ಉಂಟಾಗಿರುವ ಹಾನಿಗೆ ಪರಿಹಾರ ನೀಡಲು ಸದ್ಯಕ್ಕೆ ಅಂದಾಜು 5000 ಕೋಟಿ ಅಗತ್ಯವಿದೆ. 30 ಸಾವಿರ ಮನೆಗಳನ್ನು ನಿರ್ಮಿಸಬೇಕಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ಒಂದು ವಾರದ ಬಳಿಕ ಸಮಗ್ರ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರವನ್ನು ನೀಡಲಾಗುವುದು.
ಸುಧಾಮೂರ್ತಿಗೆ ಧನ್ಯವಾದ ; ದಾನಿಗಳಿಗೆ ಆಹ್ವಾನ
ಪ್ರವಾಹ ಪೀಡಿತ ಜನರಿಗೆ ಪುನರ್ವಸತಿ ಕಲ್ಪಿಸಲು ಹತ್ತು ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಅವರಿಗೆ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು. ಅದೇ ರೀತಿಯಲ್ಲಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ದಾನಿಗಳು ಮುಂದಾಗಬೇಕು ಎಂದು ಮನವಿ ಮಾಡಿಕೊಂಡರು.
ದಂಪತಿ ರಕ್ಷಣೆ-ಸಿಎಂ ಸಂತಸ
ಪ್ರವಾಹಕ್ಕೆ ಸಿಲುಕಿ ಬೆಳಗಾವಿ ತಾಲ್ಲೂಕಿನ ಕಬಲಾಪುರ ಗ್ರಾಮದ ಮನೆಯೊಂದರ ಮೇಲೆ ಸುಮಾರು ನಲವತ್ತು ತಾಸುಗಳಿಂದ ಕುಳಿತಿದ್ದ ಕಾಳಪ್ಪ-ರತ್ನವ್ವ ದಂಪತಿಯನ್ನು ರಕ್ಷಿಸಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂತಸ ವ್ಯಕ್ತಪಡಿಸಿದರು.ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಆಸಕ್ತಿಯಿಂದಾಗಿ ಎರಡು ವಿಶೇಷ ಹೆಲಿಕಾಪ್ಟರ್ ಬಂದಿದ್ದು, ರಕ್ಷಣಾ ಕಾರ್ಯಕ್ಕಾಗಿ ಬೆಳಗಾವಿಯಲ್ಲಿ ನಿಯೋಜಿಸಲಾಗಿದೆ ಎಂದರು.
ಇನ್ನೂ ಹೆಚ್ಚಿನ ರಕ್ಷಣಾ ದೋಣಿ ಹಾಗೂ ಹೆಲಿಕಾಪ್ಟರ್ ಒದಗಿಸುವ ಮೂಲಕ ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಲಾಗುವುದು. ಜನರು ಎಲ್ಲೇ ಸಂಕಷ್ಟದಲ್ಲಿದ್ದರೂ ಅವರ ರಕ್ಷಣೆ. ಮುಂಬರುವ ದಿನಗಳಲ್ಲಿ ಮನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಮಹಾರಾಷ್ಟ್ರ ಸಿಎಂ ಜತೆ ಚರ್ಚೆ
ಉಭಯ ರಾಜ್ಯಗಳ ಜಲಾಶಯಗಳಲ್ಲಿ ನೀರು ಸಂಗ್ರಹ ಮತ್ತು ಬಿಡುಗಡೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರದ ಮುಖ್ಯಮಂತ್ರಿಗಳ ಜತೆ ಖುದ್ದಾಗಿ ಮಾತನಾಡಿ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಪ್ರವಾಹ ಬಾಧಿತ ಪ್ರದೇಶಗಳ ಭೇಟಿಯ ಬಳಿಕ ಚಿಕ್ಕೋಡಿಯ ಪ್ರವಾಸಿಮಂದಿರದಲ್ಲಿ ನಡೆದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮಳೆಯ ಸಂದರ್ಭದಲ್ಲಿ ಜಲಾಶಯಗಳಿಂದ ದಿಢೀರ್ ನೀರು ಬಿಡುಗಡೆಮಾಡುವುದರಿಂದ ಉಭಯ ರಾಜ್ಯಗಳ ನದಿಪಾತ್ರದ ಜನರಿಗೆ ಉಂಟಾಗುವ ಸಮಸ್ಯೆಗಳ ಬಗ್ಗೆ ಪರಸ್ಪರ ಚರ್ಚೆ ನಡೆಸಿ, ಸಮನ್ವಯತೆ ಸಾಧಿಸುವ ಅಗತ್ಯವಿದೆ ಎಂದರು.
ಉಭಯ ರಾಜ್ಯಗಳ ಜಲಾಶಯದಲ್ಲಿ ನೀರು ಸಂಗ್ರಹಣೆ ಹಾಗೂ ಹಿನ್ನೀರಿನಿಂದ ಉಂಟಾಗುವ ಪರಿಣಾಮಗಳ ಕುರಿತು ಅಧಿಕಾರಿಗಳು ಉನ್ನತಮಟ್ಟದ ಸಭೆ ನಡೆಸುವ ಮೂಲಕ ಪರಸ್ಪರ ಮಾಹಿತಿ ವಿನಮಯ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ್ ಕೋರೆ, ಶಾಸಕರಾದ ಗಣೇಶ್ ಹುಕ್ಕೇರಿ, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಪಿ.ರಾಜೀವ್, ದುರ್ಯೋಧನ ಐಹೊಳೆ, ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ್ ಕವಟಗಿಮಠ, ಹನುಮಂತ ನಿರಾಣಿ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳ ಕಾರ್ಯದರ್ಶಿ ಲಕ್ಷ್ಮೀನಾರಾಯಣ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
