ದಿನದ ಸುದ್ದಿ
“ಮಕ್ಕಳಲ್ಲಿ ಆರೋಗ್ಯಕರ ಸ್ವಾಸ್ಥ್ಯ ಹಾಗೂ ಸ್ಪರ್ಧಾ ಮನೋಭಾವ ಬೆಳೆಸಬೇಕು” : ಯಡಿಯೂರಪ್ಪ

ಸುದ್ದಿದಿನ,ಮಂಡ್ಯ : ಪರಮಪೂಜ್ಯ, ಪದ್ಮಭೂಷಣ ಡಾ ಶ್ರೀ ಬಾಲಗಂಗಾಂಧರನಾಥ ಸ್ವಾಮೀಜಿ ಅವರು ಅನ್ನ, ಅಕ್ಷರ, ಆರೋಗ್ಯ, ಅರಣ್ಯ, ಆಕಳು, ಆಶ್ರಯ, ಅಭಯ ಮತ್ತು ಆಧ್ಯಾತ್ಮವೆಂಬ ಅಷ್ಟ ಸೂತ್ರಗಳನ್ನು ತಮ್ಮ ಜೀವನದ ಗುರಿಗಳನ್ನಾಗಿಟ್ಟುಕೊಂಡಿದ್ದರು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ನಾಗಮಂಗಲ ತಾಲ್ಲೂಕಿನ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಆಯೋಜಿಸಿದ್ದ, 23 ನೇ ರಾಜ್ಯ ಮಟ್ಟದ ಅಂತರ ಶಾಲಾ-ಕಾಲೇಜುಗಳ ಕ್ರೀಡಾಕೂಟದ ಉದ್ಘಾಟಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಬೇಕಾದರೆ, ವಿದ್ಯೆಯ ಜತೆಗೆ ಕ್ರೀಡೆಯೂ ಕೂಡ ಮುಖ್ಯ ಎಂಬುದನ್ನು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ನಂಬಿದ್ದರು. ಈ ಹಿನ್ನಲೆಯಲ್ಲಿ ಆದಿಚುಂಚನಗಿರಿಯ ಶಿಕ್ಷಣ ಟ್ರಸ್ಟ್ನ ವಿದ್ಯೆ ಸಂಸ್ಥೆಗಳಲ್ಲಿನ ಮಕ್ಕಳಲ್ಲಿ ಆರೋಗ್ಯಕರ ಸ್ವಾಸ್ಥ್ಯ ಹಾಗೂ ಸ್ಪರ್ಧಾ ಮನೋಭಾವ ಬೆಳೆಸಬೇಕು ಎಂಬ ಉದ್ದೇಶದಿಂದ ರಾಜ್ಯ ಮಟ್ಟದ ಕ್ರೀಡಾ ಕೂಟವನ್ನು ಆಯೋಜಿಸಿದ್ದಾರೆ ಎಂದು ತಿಳಿಸಿದರು.
ಬಾಲ್ಯದ ಆಟವು ಮಕ್ಕಳಿಗೆ ಶಿಸ್ತು ಬದ್ಧ ಜೀವನ ನಡೆಸಲು ಹಾಗೂ ಕ್ರೀಡಾ ಮನೋಭಾವವನ್ನು ರೂಪಿಸಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರುತ್ತದೆ. ಇಂದಿನ ಕಂಪ್ಯೂಟರ್ ಯುಗದಲ್ಲಿ ಮಕ್ಕಳು ಹೆಚ್ಚಾಗಿ ಹೊರಾಂಗಣ ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಕಡಿಮೆಯಾಗಿದೆ. ಇದು ಮಕ್ಕಳ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ಮಕ್ಕಳು ಓದಿನ ಜತೆಗೆ ದಿನನಿತ್ಯ ಯಾವುದಾದರೂ ಒಂದು ಕ್ರೀಡೆಯಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂಬುದು ಪೂಜ್ಯರ ಅಪೇಕ್ಷೆಯಾಗಿತ್ತು ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರು ಮಕ್ಕಳನ್ನು ಪ್ರೋತ್ಸಾಹಿಸಬೇಕು. ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸುವುದು ಬಹಳ ಮುಖ್ಯವಾಗಿದ್ದು, ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವವನ್ನು ಮಕ್ಕಳಲ್ಲಿ ತುಂಬಬೇಕು. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಸಕರಾತ್ಮಕ ಪ್ರಯೋಜನಗಳಿವೆ. ಇದನ್ನು ಮನಗಂಡು ವಿದ್ಯಾರ್ಥಿ ಜೀವನದಲ್ಲೇ ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತಹ ವಾತಾವರಣ ಸೃಷ್ಟಿಯಾಗಬೇಕು. ರಾಷ್ಟ್ರೀಯಾ ಮತ್ತು ಅಂತರರಾಷ್ಟ್ರೀಯಾ ಮಟ್ಟದಲ್ಲಿ ಸಾಧನೆ ಮಾಡಿರುವ ಕ್ರೀಡಾ ಪಟುಗಳಿಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಆದ್ದರಿಂದ ಪ್ರತಿಯೊಬ್ಬರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಕಂದಾಯ ಸಚಿವರಾದ ಆರ್.ಅಶೋಕ, ಕೆ.ಆರ್.ಪೇಟೆ ಶಾಸಕರಾದ ಕೆ.ಸಿ.ನಾರಾಯಣಗೌಡ, ನಾಗಮಂಗಲ ಶಾಸಕರಾದ ಕೆ.ಸುರೇಶ್ಗೌಡ, ತುರವೇಕೆರೆ ಶಾಸಕರಾದ ಮಸಾಲೆ ಜಯರಾಮ್, ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
