ದಿನದ ಸುದ್ದಿ
ಬೆಳಗಾವಿ ಸಮೀಪ ರಸ್ತೆ ಅವಘಡ 7 ಮಂದಿ ಸಾವು, ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳಿಂದ ಪರಿಹಾರ ಘೋಷಣೆ
ಸುದ್ದಿದಿನ ಡೆಸ್ಕ್ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನವೊಂದು ನಾಲೆಗೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಏಳು ಮಂದಿ ಮೃತಪಟ್ಟು, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದುರ್ಘಟನೆ ಬೆಳಗಾವಿ ಹೊರವಲಯದ ಕಣಬರ್ಗಿ ಸಮೀಪ ಇಂದು ಬೆಳಗ್ಗೆ ಸಂಭವಿಸಿದೆ.
ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕಲ್ಪಿಸಲಾಗುತ್ತಿದ್ದು, ಈ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವದಿಯಾಗಿದೆ. ಮೃತಪಟ್ಟವರೆಲ್ಲರೂ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ಕೂಲಿ ಕಾರ್ಮಿಕರಾಗಿದ್ದು, ಬೆಳಗಾವಿಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅಪಘಾತದ ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಮಾರಿಹಾಳ ಪೋಲಿಸರು ಮೃತ ದೇಹಗಳನ್ನು ಹೊರ ತೆಗೆದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತ ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುತ್ತದೆ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಬಳಿ ಇಂದು ನಡೆದ ಅಪಘಾತದಲ್ಲಿ 7 ಜನ ಮೃತಪಟ್ಟು, ಹಲವರು ಗಾಯಗೊಂಡಿರುವ ವಿಷಯ ತಿಳಿದು ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಈ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ನೀಡಲಾಗುವುದು.
— Basavaraj S Bommai (@BSBommai) June 26, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243