ಅಂತರಂಗ
ಸಾಧನೆ ಬದುಕಿನ ಮಾರ್ಗ ಮಾತ್ರ ಆಗಿರಬೇಕು..!
ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಬಯಸುವವರು ಬಹಳ. ಎಲ್ಲರೂ ಗುರುತಿಸುವ ಸಾಧನೆ ನಾನು ಮಾಡಬೇಕು ಎಂದು ಎಷ್ಟೋ ಜನ ಹಂಬಲಿಸಿತ್ತಾರೆ. ಇದಕ್ಕಾಗಿ “ಗುರಿ ಮುಟ್ಟುವ ವರೆಗೆ ನಿಲ್ಲದಿರು” ಎಂದಿದ್ದ ಸ್ವಾಮಿ ವಿವೇಕಾನಂದರನ್ನೂ ನೆನೆಸಿಕೊಳ್ಳುತ್ತಾರೆ. ತಾವು ಬದುಕಿರುವುದೇ ಸಾಧನೆ ಮಾಡಲು, ಏನನ್ನಾದರೂ ಸಾಧಿಸದ ಬದುಕು ವ್ಯರ್ಥ ಎಂದು ಅನೇಕರು ಯೋಚಿಸುತ್ತಾರೆ…
ಹೀಗೆ ನಾನಾ ರೀತಿಯಲ್ಲಿ “ಸಾಧನೆಗಳ” ಬೆನ್ನು ಹತ್ತಿ ಸಾಧನೆ ಮಾಡುವುದೇ ಬದುಕಿನ ಉದ್ದೇಶ ಎಂದು ತಿಳಿದು ಹೊರಡುವುದು ಅಂತಿಮವಾಗಿ ವ್ಯಕ್ತಿಗಳನ್ನು ಎಲ್ಲಿಗೆ ಕೊಂಡೊಯ್ಯುತ್ತದೆ ಗೊತ್ತೆ?
ಬೇರೆಲ್ಲಿಗೂ ಅಲ್ಲ ಯಾವ ಮಹತ್ಸಾಧನೆಗೂ ಅಲ್ಲ. ಅದು ಅವರನ್ನು ಒಯ್ದು ನಿಲ್ಲಿಸುವುದು ಪರಮ ಸ್ವಾರ್ಥದ ಬದುಕಿಗೆ. ಇಂತಹ ಬಹುತೇಕ “ಸಾಧಕರು” ಸ್ವಾರ್ಥ ಸಾಧನೆಯಲ್ಲಿ ಕಳೆದು ಹೋಗುತ್ತಾರೆ.
ಯಾಕೆಂದರೆ ಸಾಧನೆ ಮಾಡುವುದೇ ಬದುಕಿನ ಅಂತಿಮ ಗುರಿಯಾದಾಗ, ಆ ತಾವು ಪರಿಭಾವಿಸಿಕೊಂಡ ಸಾಧನೆಯನ್ನು ಸಾಧಿಸಲು ಯಾವ ಮಾರ್ಗವೂ ಅವರಿಗೆ ತಪ್ಪು ಎನಿಸುವುದಿಲ್ಲ. ಪೈಪೋಟಿಯೇ ಅವರಿಗೆ ಮುಖ್ಯ ಆಗುತ್ತದೆ. ಈ ಪೈಪೋಟಿಯಲ್ಲಿ, ಸಾಧನೆಯ ರೇಸಿನಲ್ಲಿ ತಮ್ಮ ಎದುರಾಳಿ ಎಂದುಕೊಂಡವರನ್ನು ಹತ್ತಿಕ್ಕುವುದು ಅಥವಾ ತುಳಿಯುವುದೂ ಅನಿವಾರ್ಯವಾಗುತ್ತದೆ. ಜೊತೆಗಿರುವವರಿಗೇ ಚೂರಿ ಹಾಕಿದರೂ ಇದೆಲ್ಲಾ ಸಾಧನೆಗೆ ಅನಿವಾರ್ಯ ಎಂಬ ಸಮರ್ಥನೆ ಒಳಗಿನಿಂದಲೇ ಬರುತ್ತದೆ.
ಹೀಗಾಗಿ ಸಾಧನೆಗಾಗಿ ಬದುಕುವುದು ಅತ್ಯಂತ ಸ್ವಾರ್ಥದ, ಕಿತ್ತು ತಿನ್ನುವ ಪೈಪೋಟಿಯ ಅನಾರೋಗ್ಯಕರ ಸಮಾಜವೊಂದನ್ನು ಸೃಷ್ಟಿಸುತ್ತದೆ. ಈಗ ನಮ್ಮ ಕಣ್ಣೆದುರಿಗೆ ಇರುವುದೂ ಅದೇ ಆಗಿದೆ.
ಇದರ ಅರ್ಥ ನಾವು ಯಾವುದೇ ಸಾಧನೆ ಮಾಡಬಾರದು ಎಂದಲ್ಲ. ಆದರೆ ಯಾವುದೇ ಸಾಧನೆಗೆ ತೊಡಗುವ ಮೊದಲು ನಮಗೆ ನಮಗೆ ಒಂದಲ್ಲ ಹತ್ತು ಸಲ ಸ್ಪಷ್ಟಪಡಿಸಿಕೊಳ್ಳಬೇಕಾದ ವಿಷಯ ಒಂದಿದೆ.
ಅದು ಈ ಸಾಧನೆ ಯಾಕಾಗಿ? ಏನನ್ನೋ ಸಾಧಿಸುವ ಅವಕಾಶ ನೀಡುವ ಈ ಬದುಕಿನ ಗಮ್ಯವೇನು? ಬದುಕಿನ ಅಂತಿಮ ಉದ್ದೇಶವೇನು ಎಂಬ ಪ್ರಶ್ನೆಗೆ ಉತ್ತರಿಸಿಕೊಳ್ಳುವುದು. ಸಾಧನೆಯನ್ನೇ ಬದುಕಿನ ಅಂತಿಮ ಉದ್ದೇಶ ಮಾಡಿಕೊಳ್ಳುವುದು ತಪ್ಪು ನಡೆಗಳಿಗೆ ಒಯ್ಯಬಹುದು. ಸಾಧನೆ ಬದುಕಿನ ಮಾರ್ಗ ಮಾತ್ರ ಆಗಿರಬೇಕು.
ಹೀಗೆ ಹೇಳಿದಾಗ ಬದುಕಿಗೆ ಒಂದು ಬೇರೆಯದೇ ಉದ್ದೇಶವಿರುತ್ತದೆ ಎಂದು ಅರ್ಥ ಮಾಡಿಕೊಳ್ಳಬೇಕಾಗುತ್ತದೆ. Achievement is not an end in itself, rather a means to reach an end. ಹಾಗಾದರೆ ಬದುಕಿನ ಉದ್ದೇಶವೇನಾಗಿರಬೇಕು? ಈ ಪ್ರಶ್ನೆಗೆ ಅನೇಕ ದಾರ್ಶನಿಕರು ಅನೇಕ ಉತ್ತರ ನೀಡಿರಬಹುದು. ಆದರೆ ನನಗೆ ಸರಿ ಎನಿಸಿರುವ ಬದುಕಿನ ಉದ್ದೇಶ ಸರಳವಾಗಿದೆ. ಮನುಕುಲಕ್ಕೆ ಸೇವೆ ಸಲ್ಲಿಸುವುದು, ಸಹ ಮನುಷ್ಯರ ಕಷ್ಟಕ್ಕೆ ಸಹಾಯ ಮಾಡುವುದು; ಸ್ವಲ್ಪ ಜನರಲ್ ಆಗಿ ಹೇಳಬೇಕೆಂದರೆ ನಮಗೆ ಬದುಕುವ ಅವಕಾಶ ಒದಗಿಸಿರುವ ಈ ವಿಸ್ಮಯಕಾರಿ ವಿಶ್ವದ ಒಂದು ಅದ್ಭುತ ಸೃಷ್ಟಿಯಾದ ನಮ್ಮ ಭೂಮಿಯನ್ನು, ಇಲ್ಲಿನ ಸಕಲ ಜೀವಿ ಚರಾಚರಗಳ ಒಳಿತಿಗಾಗಿ ಶ್ರಮಿಸುವುದು. ಸಕಲ ಜೀವಿಗಳ, ನಮ್ಮ ಭೂಮಿಯ ಒಳಿತಿನಲ್ಲಿಯೇ ಮನುಜರ ಒಳಿತೂ ಅಡಗಿದೆ ಎಂಬುದನ್ನು ಅರಿಯುವುದು.
ವಿಶ್ವ ಕಂಡ ಮಹಾನ್ ಸಾಹಿತಿ ಲಿಯೋ ಟಾಲ್ ಸ್ಟಾಯ್ ಹೇಳುತ್ತಾರೆ “ಜೀವನದಲ್ಲಿ ಅತ್ಯಂತ ಶ್ರೇಯಸ್ಕರವಾದುದು ಎಂದರೆ ಮನುಕುಲದ ಒಳಿತಿಗಾಗಿ ಶ್ರಮಿಸುವುದು” ಎಂದು. ಟಾಲ್ ಸ್ಟಾಯ್ ತಮ್ಮ ಇವಾನ್ ಇಲ್ಯಿಚ್ ನ ಸಾವು ” ಎಂಬ ಪ್ರಸಿದ್ಧ ಕತೆಯಲ್ಲಿ ಇದೇ ತತ್ವವನ್ನು ಇಲ್ಯಿಚ್ ಎಂಬ ಸರ್ಕಾರಿ ಕಚೇರಿಯೊಂದರ ಗುಮಾಸ್ತನ ಬದುಕಿನ ಮೂಲಕ ತಿಳಿಸಲು ಯತ್ನಿಸುತ್ತಾರೆ. ಇದೇ ಕತೆಯನ್ನು ಲೋಕಪ್ರಸಿದ್ಧ ಸಿನಿಮಾ ನಿರ್ದೇಶಕ ಅಕಿರಾ ಕುರಾಸೋವಾ “ಇಕಿರು” ಹೆಸರಿನ ಸಿನಿಮಾ ಮಾಡಿದ್ದಾರೆ. ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರಾಗಿರುವ ಕುರೋಸಾವಾ ಅವರ “ಇಕಿರು” (ಅಂದರೆ ಬದುಕು) ಅವರ ಸಿನಿಮಾಗಳಲ್ಲೇ ನನ್ನ ಇಷ್ಟದ ಸಿನಿಮಾ ಕೂಡಾ.
ಜೀವನದ ಬಹುಪಾಲು ಮಾಮೂಲಿ ಅಧಿಕಾರಶಾಹಿಯ ವಿಳಂಬ ನೀತಿ (red tapism) ಯಲ್ಲಿ ಕಳೆಯುವ, ಬದುಕಿಗೆ ಯಾವ ಅರ್ಥವೂ ಇಲ್ಲದೇ ಬದುಕುವ ನೌಕರನೊಬ್ಬ ತನಗೆ ಕ್ಯಾನ್ಸರ್ ಇದೆ ಎಂದು ವೈದ್ಯರು ಹೇಳಿದ ನಂತರ, ಇನ್ನು ಆರು ತಿಂಗಳಲ್ಲಿ ತನ್ನ ಸಾವು ಖಚಿತ ಎಂದು ತಿಳಿದ ಮೇಲೆ ಆ ಆರು ತಿಂಗಳು ಹೇಗೆ ಬದುಕಿದ ಎಂದು ಅವನು ಸತ್ತ ನಂತರ ಸಹೋದ್ಯೋಗಿಗಳು ನಡೆಸುವ ಮಾತುಕತೆಯಲ್ಲಿ ತೆರೆದುಕೊಳ್ಳುತ್ತದೆ. ಆತನ ಬದುಕು ದೊಡ್ಡ ರೂಪಾಂತರವನ್ನೇ ಹೊಂದುತ್ತದೆ. ಆ ಅವಧಿಯಲ್ಲಿ ಅವನು ಮಾಡುವುದೆಲ್ಲಾ ಒಳ್ಳೆಯ ಸಾಧನೆ ಆಗುತ್ತದೆ.
ಹೌದು, ಬದುಕಿಗೆ ನಾವು ಉದಾತ್ತ ಉದ್ದೇಶಗಳನ್ನು ಹೊಂದಿದಾಗ ಮಾತ್ರ ನಮ್ಮ ಯಾವುದೇ ಸಾಧನೆ ಮತ್ತು ಬದುಕಿನ ಯಾನ ಅರ್ಥಪಡೆಯುತ್ತದೆ. ಬದುಕಿನ ಉದ್ದೇಶ ಸರಿಯಾಗಿ ನಿರ್ಧಾರವಾಗಿದ್ದಾಗ ನಮ್ಮ ಯಾವುದೇ ಸಾಧನೆ “ಸ್ವಾರ್ಥದ” ಹಾದಿ ಹಿಡಿಯುವುದಿಲ್ಲ, ಇನ್ನೊಬ್ಬರನ್ನು ತುಳಿಯುವ, ಇನ್ನೊಬ್ಬರ ಏಳಿಗೆಗೆ ಕರುಬುವ ಅಗತ್ಯ ಕಂಡು ಬರುವುದಿಲ್ಲ. ಸುಳ್ಳು ಶತ್ರುಗಳೂ ಸೃಷ್ಟಿಯಾಗುವುದಿಲ್ಲ, ಒಂದು ಅವಕಾಶ ಹೋದರೆ ಮರುಗುತ್ತಾ ಅದಕ್ಕೆ ಅವರು ಕಾರಣ ಇವರು ಕಾರಣ ಎಂದುಕೊಂಡು ಕತ್ತಿ ಮಸೆಯುವ ಯಾವ ಅಗತ್ಯವೂ ಇರುವುದಿಲ್ಲ.
ಹೀಗೆ ಬದುಕಿಗೆ ಉದಾತ್ತ ಉದ್ದೇಶ ಕಲ್ಪಿಸಿಕೊಂಡು ಆ ಉದ್ದೇಶಗಳಿಗಾಗಿ ಬದುಕಿದವರಲ್ಲಿ ಬಾಬಾಸಾಹೇಬ್ ಅಂಬೇಡ್ಕರ್, ನಾರಾಯಣ ಗುರು, ಸ್ವಾಮಿ ವಿವೇಕಾನಂದ, ಭಗತ್ ಸಿಂಗ್, ಚೆ ಗುವಾರಾ, ಡಾರ್ವಿನ್, ಐನ್ ಸ್ಟೀನ್, ಸ್ಟೀವನ್ ಹಾಕಿಂಗ್, ಅಬ್ರಹಾಂ ಲಿಂಕನ್, ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ, ಗಾಂಧೀಜಿ ಇವರೆಲ್ಲ ನಿಲ್ಲುತ್ತಾರೆ. ಇವರಲ್ಲಿ ಯಾರೂ ಸಾಧನೆಗಾಗಿ ಸಾಧನೆ ಮಾಡಿದವರಲ್ಲ, ಬದುಕಿನ ಘನ ಉದ್ದೇಶಗಳಿಗಾಗಿ ಅವರು ನಡೆಸಿದ ಪ್ರಾಮಾಣಿಕ, ಶ್ರಮದಾಯಕ ಪ್ರಯತ್ನಗಳೇ ಸಾಧನೆಗಳಾದವು.
ಹೀಗಾಗಿ ಸಾಧನೆ ಕುರಿತು ಯೋಚಿಸುವ ಮುನ್ನ ಬದುಕಿನ ಉದ್ದೇಶದ ಬಗ್ಗೆ ಯೋಚಿಸಿ, ಖಚಿತಪಡಿಸಿಕೊಳ್ಳಿ. ಹಾಗೂ ಆ ನಿಮ್ಮ ಉದ್ದೇಶದಲ್ಲಿ ನೀವೆಷ್ಟು ಪ್ರಾಮಾಣಿಕರು ಎಂದೂ ನೋಡಿಕೊಳ್ಳಿ, ನಿಮ್ಮ ದೈನಂದಿನ ವರ್ತನೆಗಳು ಅದಕ್ಕೆ ಪೂರಕವಾಗಿವೆಯೇ ವ್ಯತಿರಿಕ್ತವಾಗಿದೆಯೇ ಎಂದೂ ನೋಡಿಕೊಳ್ಳಿ. ಬದುಕು ಸಾರ್ಥಕವಾಗುತ್ತದೆ.
– ಹರ್ಷಕುಮಾರ್ ಕುಗ್ವೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

-
ದಿನದ ಸುದ್ದಿ4 days agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ4 days agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ1 day agoಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ
-
ಅಂತರಂಗ2 days agoದಿಮಾಗಿ ನಕ್ಸಲ್-ನಗರ ನಕ್ಸಲ್
-
ದಿನದ ಸುದ್ದಿ3 days agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್‌ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
-
ಅಂತರಂಗ3 hours agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

