Connect with us

ದಿನದ ಸುದ್ದಿ

ಹರಪನಳ್ಳಿ,ಹಡಗಲಿ,ಹಗರಿಬೊಮ್ಮನಳ್ಳಿಯಲ್ಲಿ ನೆರೆಹಾವಳಿ ಭೀತಿ : ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗ್ರತಾ ಕ್ರಮ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬಳ್ಳಾರಿ : ತುಂಗಾ ಮತ್ತು ಭದ್ರಾದಿಂದ ಹೊರಹರಿಯುವ ನೀರಿನ ಪ್ರಮಾಣದಲ್ಲಿ ತೀವ್ರ ಹೆಚ್ಚಳವಾಗಿದ್ದು ಅಪಾರ ಪ್ರಮಾಣದಲ್ಲಿ ತುಂಗಾಭದ್ರಾ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ತುಂಗಾ ಮತ್ತು ಭದ್ರಾದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಪರಿಣಾಮ ಹರಪನಳ್ಳಿ,ಹಡಗಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿ ನೆರೆಹಾವಳಿ ಭೀತಿ ಉಂಟಾಗಿದೆ. ಇದನ್ನರಿತ ಬಳ್ಳಾರಿ ಜಿಲ್ಲಾಡಳಿತ ತುರ್ತು ಸಭೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ತುರ್ತುಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಪ್ರತಿನಿತ್ಯ 10 ಟಿಎಂಸಿಯಷ್ಟು ನೀರು ತುಂಗಾಭದ್ರಾ ಜಲಾಶಯಕ್ಕೆ ನೀರು ಹರಿದುಬರುತ್ತಿದೆ. ತುಂಗಾ ಮತ್ತು ಭದ್ರಾದಿಂದ ನೀರು ಅಪಾರ ಪ್ರಮಾಣದಲ್ಲಿ ಹರಿದು ಬರುತ್ತಿರುವ ಪರಿಣಾಮ ಹರಪನಳ್ಳಿ,ಹಗರಿಬೊಮ್ಮನಳ್ಳಿ ಮತ್ತು ಹಡಗಲಿ ತಾಲೂಕಿನ ನದಿಪಾತ್ರದ ಗ್ರಾಮಗಳಲ್ಲಿ ನೆರೆಹಾನಿ ಉಂಟಾಗುವ ಸಾಧ್ಯತೆ ಇದ್ದು, ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಭೆ ನಡೆಸಿ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನದಿಪಾತ್ರದಲ್ಲಿರುವ ಮನೆಗಳಿಗೆ ಧಕ್ಕೆಯಾಗಲಿವೆ ಎಂದು ಹೇಳಿದ ಡಿಸಿ ನಕುಲ್ ಅವರು ಸಂಭಾವ್ಯ ನೆರೆಹಾನಿ ಉಂಟಾಗುವ ಪ್ರದೇಶಗಳಿಗೆ ಕೂಡಲೇ ಉಪವಿಭಾಗಾಧಿಕಾರಿಗಳು, ತಹಸೀಲ್ದಾರರು, ತಾಪಂ ಇಒಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ತೆರಳಿ ಅಲ್ಲಿನ ಗ್ರಾಪಂ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳೊಂದಿಗೆ ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ನದಿಪಾತ್ರದಲ್ಲಿ ಮನೆಕಟ್ಟಿಕೊಂಡವರ ಮನೆಗಳಿಗೆ ಹಾಗೂ ಮಣ್ಣಿನ ಗೊಡೆ ಮನೆಗಳಲ್ಲಿರುವ ಮನೆಗಳಿಗೆ ಗ್ರಾಪಂ ಪಿಡಿಒಗಳು ಮತ್ತು ಗ್ರಾಮಲೆಕ್ಕಿಗರು ತೆರಳಿ ಅವರಿಗೆ ಸ್ಥಳಾಂತರಕ್ಕೆ ಸೂಚಿಸಬೇಕು ಮತ್ತು ತಮ್ಮ ಮೊಬೈಲ್ ನಂಬರ್‍ಗಳನ್ನು ಅವರಿಗೆ ನೀಡಬೇಕು. ತುರ್ತು ಸಂದರ್ಭದಲ್ಲಿ ಅವರು ತಮ್ಮನ್ನು ಸಂಪರ್ಕಿಸಲು ಸಾಧ್ಯವಾಗುತ್ತದೆ ಎಂದರು.

ತುರ್ತುಸಂದರ್ಭದಲ್ಲಿ ಜನ-ಜಾನುವಾರುಗಳನ್ನು ರಕ್ಷಣೆ ಮಾಡಲು ಅನುಕೂಲವಾಗುತ್ತದೆ ಎಂಬ ಕಾರಣಕ್ಕೆ ಹಗರಿಬೊಮ್ಮನಹಳ್ಳಿ ಮತ್ತು ಹರಪನಳ್ಳಿಗಳಲ್ಲಿ ಎರಡು ಬೋಟ್‍ಗಳು ರಕ್ಷಣಾ ತಂಡಗಳು ಲಭ್ಯವಿರುವಂತೆ ಮಾಡಲಾಗಿದೆ ಮತ್ತು ಇದರ ಜತೆಗೆ ಆರೋಗ್ಯ ತಂಡಗಳು ಇರಲಿವೆ ಎಂದು ಅವರು ವಿವರಿಸಿದರು.

ಪ್ರತಿನಿತ್ಯ ವರದಿ ನೀಡಲು ಸೂಚನೆ

ಜನ-ಜಾನುವಾರು ಹಾಗೂ ಮನೆಗಳ ಹಾನಿ ಕುರಿತಂತೆ ಒಂದು ನಮೂನೆ ಸಿದ್ದಪಡಿಸಲಾಗಿದ್ದು, ಅದರಂತೆ ಪ್ರತಿನಿತ್ಯ ತಮ್ಮ ವ್ಯಾಪ್ತಿಯಲ್ಲಾಗುವ ಹಾನಿಗಳ ವಿವರವನ್ನು ಜಿಲ್ಲಾಡಳಿತಕ್ಕೆ ಉಪವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರು ಕಳುಹಿಸಿಕೊಡಬೇಕು. ಹಾನಿಗಿಡಾದವರ ಕುಟುಂಬಕ್ಕೆ ವಿಪತ್ತು ನಿಧಿ ಅಡಿ 3 ದಿನದೊಳಗೆ ಪರಿಹಾರ ನೀಡುವಂತೆ ನೋಡಿಕೊಳ್ಳಿ; ಈ ವಿಷಯದಲ್ಲಿ ಯಾವುದೇ ಸಬೂಬು ಮತ್ತು ಶಿಷ್ಟಾಚಾರ ಬೇಡ ಎಂದು ಅವರು ಡಿಸಿ ನಕುಲ್ ಸೂಚಿಸಿದರು.

ಕುರವತ್ತಿಯಲ್ಲಿ ಹಾನಿಯಾಗಿದೆ ಎಂಬ ಮಾಹಿತಿಯಿದ್ದು,ಪರಿಹಾರ ಕೂಡಲೇ ಒದಗಿಸಿ ಎಂದು ಸೂಚನೆ ನೀಡಿದ ಅವರು, ಅವಶ್ಯ ಬಿದ್ದರೇ ಗಂಜಿಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದ್ದು, ಅಂತ ಸ್ಥಳಗಳನ್ನು ಗುರುತಿಸಿ ಪಟ್ಟಿ ಮಾಡಿಟ್ಟುಕೊಳ್ಳಿ. ನೆರೆಹಾವಳಿಯಿಂದ ರಸ್ತೆ ಮತ್ತು ಬ್ರಿಡ್ಜ್‍ಗಳಿಗೆ ಆಗುವ ಹಾನಿ ಪ್ರಮಾಣದ ವಿವರವನ್ನು ಒದಗಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ತುಂಗಾಭದ್ರಾ ಜಲಾಶಯದಿಂದ ನೀರು ಬಿಡುವ ಸಂದರ್ಭದಲ್ಲಿ ನದಿಪಾತ್ರದೂದ್ದಕ್ಕೂ ಹಂಪಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹಾನಿಯುಂಟಾಗದಂತೆ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ವಿವರ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಡಿಸಿ ನಕುಲ್ ಅವರು, ಎಸಿಗಳು ಮತ್ತು ತಹಸೀಲ್ದಾರರು ಕೂಡಲೇ ಸಭೆ ನಡೆಸಿ ಕಾರ್ಯಪ್ರವೃತ್ತರಾಗಿ ಹಾಗೂ ಸ್ಥಳೀಯಮಟ್ಟದ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಸ್ಪಂದಿಸುವ ಕೆಲಸ ಮಾಡಿ ಎಂದರು.

ಸಹಾಯವಾಣಿ ಕೇಂದ್ರಗಳ ಸ್ಥಾಪನೆ

ನೆರೆಹಾನಿಯಾದ ಸಂದರ್ಭದಲ್ಲಿ ಜನರಿಗೆ ತುರ್ತು ನೆರವಿಗೆ ಧಾವಿಸಬೇಕೆಂಬ ದೃಷ್ಟಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಿ ಮತ್ತು ನಿರಂತರ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಬೇಕು. ದೂರು ಬಂದ ತಕ್ಷಣ ಸ್ಪಂದಿಸಬೇಕುಎಂದು ಡಿಸಿ ನಕುಲ್ ಸೂಚಿಸಿದರು.

ಎನ್‍ಡಿಆರ್‍ಎಫ್ ಸಹಾಯಬೇಕಿದ್ದಲ್ಲಿ ಕೇಳಿ ಅಗತ್ಯ ನೆರವು ಒದಗಿಸಲಾಗುವುದು ಎಂದು ಹೇಳಿದ ಅವರು, ಗ್ರಾಮಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಫಾಗಿಂಗ್ ಮಶೀನ್ ಮತ್ತು ಬ್ಲೀಚಿಂಗ್ ಪೌಡರ್ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಡಿಎಚ್‍ಒ ಮತ್ತು ಟಿಎಚ್‍ಒಗಳು ಸಂಭ್ಯಾವ ನೆರೆಹಾವಳಿ ಪ್ರದೇಶಗಳಿಗೆ ಭೇಟಿ ನೀಡಿ ಆ ವ್ಯಾಪ್ತಿಯ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ಔಷಧಿಗಳಿರುವಂತೆ ನೋಡಿಕೊಳ್ಳಬೇಕು ಎಂದರು.

ಕೃಷಿ ಚಟುವಟಿಕೆಗಳಿಗಾಗಿ ಬಳ್ಳಾರಿ ಜಿಲ್ಲೆಗೆ ನೀರು ಬಿಡುಗಡೆ

ಬಳ್ಳಾರಿ ರೈತಾಪಿ ಸಮುದಾಯ ಕೃಷಿ ಚಟುವಟಿಕೆಗಳಿಗಾಗಿ ಬಹಳ ದಿನಗಳಿಂದ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ತುಂಗಾಭದ್ರಾ ಜಲಾಶಯದ ನೀರು ಕೃಷಿ ಚಟುವಟಿಕೆಗಳಿಗಾಗಿ ಶುಕ್ರವಾರ ಬೆಳಗ್ಗೆ ಬಿಡುಗಡೆ ಮಾಡಲಾಗುತ್ತಿದೆ.

ಈಗಾಗಲೇ 50 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿದ್ದು, ಪ್ರತಿನಿತ್ಯ 10 ಟಿಎಂಸಿ ನೀರು ಜಲಾಶಯಕ್ಕೆ ಹರಿದುಬರುತ್ತಿರುವ ಹಿನ್ನೆಲೆ ನೀರು ಬಿಡಲಾಗುತ್ತಿದೆ ಎಂದು ತುಂಗಾಭದ್ರಾ ಬೋರ್ಡ್ ಅಧೀಕ್ಷಕ ವೆಂಕಟರಮಣ ಸಭೆಗೆ ತಿಳಿಸಿದರು.

ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ ಸಿ.ಕೆ.ಬಾಬಾ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಈಶ್ವರ್ ಕಾಂಡೂ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್, ಉಪವಿಭಾಗಾಧಿಕಾರಿಗಳಾದ ರಮೇಶ ಕೋನರೆಡ್ಡಿ, ಪಿ.ಎನ್.ಲೋಕೇಶ ಸೇರಿದಂತೆ ವಿವಿಧ ತಾಲೂಕುಗಳ ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆ‌ಆರ್.ಐ.ಡಿ.ಎಲ್  ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಮಾಯಕೊಂಡ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.

ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.

ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending