ದಿನದ ಸುದ್ದಿ
ದಾವಣಗೆರೆ | ಜನಸ್ಪಂದನ ಸಭೆಗೆ ಅರ್ಜಿಗಳ ಮಹಾಪೂರ
ಸುದ್ದಿದಿನ,ದಾವಣಗೆರೆ : ಸಾರ್ವಜನಿಕರು ದೂರು ಮತ್ತು ಅಹವಾಲುಗಳನ್ನು ನೀಡುವುದು ಕರ್ತವ್ಯ. ಅದರಂತೆ ಚುನಾವಣೆಗಳಲ್ಲಿ ಮತದಾನ ಮಾಡಬೇಕಿರುವುದು ನಾಗರಿಕರಾದ ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವೆಂದು ದೂರುನೀಡಲು ಬಂದಿದ್ದ ಮಹಿಳಾ ವಕೀಲರೊಬ್ಬರಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸಲಹೆ ನೀಡಿದರು.
ಸೋಮವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನದಲ್ಲಿ ಜನರ ಅವಹಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ದೂರು ನೀಡಲು ಆಗಮಿಸಿದ್ದ ಮಹಿಳಾ ವಕೀಲರೊಬ್ಬರಿಗೆ ನೀವು ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ್ದಿರಾ ಎಂದಾಗ, ಆ ಮಹಿಳೆ ಇಲ್ಲ ಎಂದು ಹೇಳಿದರು. ಇದಕ್ಕೆ ಜಿಲ್ಲಾಧಿಕಾರಿಗಳು ನಾಗರಿಕರಾಗಿ ಮತದಾನ ಮಾಡಬೇಕಿರುವುದು ನಮ್ಮ ಮುಖ್ಯ ಕರ್ತವ್ಯ, ಮತದಾನ ನಮ್ಮ ಹಕ್ಕು ಅದನ್ನು ಬಳಸಬೇಕಿರುವುದು ನಮ್ಮ ಜವಬ್ದಾರಿ ಸಲಹೆ ನೀಡಿದರು.
ಜನಸ್ಪಂದನ ಸಭೆಯಲ್ಲಿ ದೇವರಾಜ್ ಅರಸ್ ಬಡಾವಣೆಯ ನಿವಾಸಿಯೊಬ್ಬರು ಕೋರ್ಟ್‍ನ ಹಿಂಭಾಗ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ಸ್ವಚ್ಚತೆ ಇಲ್ಲ, ಇಲ್ಲಿ ವಾಸಿಸುವ ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗುತ್ತಿದೆ. ಮತ್ತು ರಿಂಗ್ ರಸ್ತೆ ಹಾಗೂ ಕೋರ್ಟ್ ಹಿಂಭಾಗದ ರಸ್ತೆಗಳಲ್ಲಿ ಓಡಾಡಲು ಸಾರ್ವಜನಿಕರಿಗೆ ಭಯದ ವಾತವರಣವಿದೆ. ಇದರ ಬಗ್ಗೆ ಮಹಾನಗರಪಾಲಿಕೆ ಹಲವಾರು ಬಾರಿ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲವೆಂದು ದೂರಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ನಗರದ ಹಲವಾರು ಸ್ಥಳಗಳಲ್ಲಿ ಇದೇ ರೀತಿಯ ಸಮಸ್ಯೆಗಳಿದ್ದು, ಅದರ ಬಗ್ಗೆ ಗಮನ ಹರಿಸಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಮಹಾನಗರಪಾಲಿಕೆ ಆಯುಕ್ತರಿಗೆ ತಿಳಿಸಿದರು.
ಎಸ್‍ಪಿಎಸ್ ನಗರದ ನಿವಾಸಿಯಾದ ಮಂಜುಳ ಎಸ್ ಹಿರೇಮಠ್ ಎಂಬುವರು, ನಾನು ಬಿ.ಎ ಪದವೀಧರಳಾಗಿದ್ದು, ಅಂಗವಿಕಲರ ಅಧಿನಿಯಮದಡಿ ಅಂಗವಿಕಲರ ಸಹಾಯವಾಣಿಯ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ತಿರಸ್ಕರಿಸಲಾಗಿದೆ. ಈ ಅರ್ಜಿಯನ್ನು ಪರಿಶೀಲಿಸಿ ನನಗೆ ಉದ್ಯೋಗ ದೊರಕಿಸಿಕೊಡಬೇಕೆಂದು ಮನವಿ ಮಾಡಿಕೊಂಡರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಈ ಹುದ್ದೆಯು ವಿಕಲಚೇತನದಡಿ ಇದ್ದು, ಬೇರೆಯವರು ಕಾರ್ಯ ನಿರ್ವಹಿಸುತ್ತಿದ್ದರೆ ಅವರನ್ನು ತೆಗೆದು ಹಾಕಿ ಇವರಿಗೆ ಉದ್ಯೋಗ ನೀಡುವಂತೆ ತಿಳಿಸಿದರು.
ದೇವರಾಜ್ ಅರಸ್ ಬಡಾವಣೆಯ ನಿವಾಸಿ ಸುನಂದ ಎಂಬುವರು ಲಕ್ಷೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಹಿರಿಯ ನಾಗರಿಕ ಠೇವಣಿ ಯೋಜನೆಯಡಿ ಒಂದು ಲಕ್ಷ ಹಣವನ್ನು ಠೇವಣಿ ಮಾಡಲಾಗಿತ್ತು. ನಮ್ಮ ಠೇವಣಿ ಅವಧಿ ಮುಗಿದು, ಬಾಂಡ್ ಮೆಚ್ಯುರಿಟಿ ಆಗಿದ್ದರು ನಮಗೆ ಹಣ ನೀಡದೇ ಸತಾಯಿಸುತ್ತಿದ್ದಾರೆ ಎಂದು ದೂರು ನೀಡಿದರು.
ಜಿಲ್ಲಾಧಿಕಾರಿ ಈ ಬಗ್ಗೆ ಸೊಸೈಟಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಒಟ್ಟು 1200 ಈ ರೀತಿಯ ಘಟನೆಗಳು ನಡೆದಿವೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗೆ ನೋಟಿಸ್ ನೀಡಲಾಗಿದ್ದು, ಆ ವ್ಯಕ್ತಿ 15 ದಿನಗಳಿಂದ ಕಚೇರಿಗೆ ಬಂದಿಲ್ಲ. ಇದಕ್ಕೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರದ ನಿವಾಸಿ ಮಲ್ಲಿಕಾರ್ಜಿನ್ ಇಂಗಳೇಶ್ವರ ಎಂಬುವರು ಪುಷ್ಪ ಮಹಾಲಿಂಗಪ್ಪ ಶಾಲೆಯವರ ಜಾಗ ಎಷ್ಟಿದೆ ಎಂಬುದು ತಿಳಿದಿಲ್ಲ, ಶಾಲೆಯ ಸುತ್ತ ಮುತ್ತ ದೊಡ್ಡ ಬಿಲ್ಡಂಗ್ ಅನುಮತಿಯಿಲ್ಲದೇ ನಿರ್ಮಾಣವಾಗುತ್ತಿವೆ ಇದರ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸಸಬೇಕೆಂದು ದೂರು ಅರ್ಜಿ ಸಲ್ಲಿಸಿದರು.
ವಾಕ್ ಮತ್ತು ಶ್ರವಣ ದೋಷವುಳ್ಳ ಅನೇಕ ಜನ ವಿಕಲಚೇತನರು ನಮಗೆ ಸ್ವಯಂ ಉದ್ಯೋಗ ಯೋಜನೆಯಡಿ ಸಾಲ ಸೌಲಭ್ಯಗಳನ್ನು ಒದಗಿಸಿಕೊಡಿ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ನಿಮಗೆ ಅವಶ್ಯವಿರುವ ಸಹಾಯ ಮಾಡಲು ನಾನು ಸಿದ್ಧನಿದ್ದೆ, ನಿಮ್ಮ ಅನುಕೂಲಕ್ಕಾಗಿ ಸಂಬಂಧಿಸಿದ ಎಲ್ಲ ಇಲಾಖೆಗಳ ಸಮ್ಮಖದಲ್ಲಿ ಅಭೆ ನಡೆಸಿ ಅಗತ್ಯವಾದ ಸಹಾಯ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.
ನಂಜನಗೌಡ ಎಂಬುವರು ಉಚ್ಚಂಗಿದುರ್ಗ ಕ್ಷೇತ್ರವು ಐತಿಹಾಸಿಕವಾಗಿ ಹೆಚ್ಚು ಪ್ರಸಿದ್ದಿ ಹೊಂದಿದ್ದು, ದಾವಣಗೆರೆಯಿಂದ ಅಣಜಿ ಕ್ರಾಸ್ ಮುಂಖಾತರ ಉಚ್ಚಂಗಿದುರ್ಗಕ್ಕೆ ಕೆಎಸ್‍ಆರ್‍ಟಿಸಿ ಬಸ್ ಸೇವೆ ಒದಗಿಸಬೇಕೆಂದು ಮನವಿ ಪತ್ರ ಸಲ್ಲಿಸಿದರು.
ಹರಿಹರ ನಿವಾಸಿ ನಿಸಾರ್ ಅಹಮದ್‍ರವರು ನಾನು ಬಡ ವರ್ಗದವನಾಗಿದ್ದು, ಶೇ.75 ರಷ್ಟು ಅಂಗವಿಕಲತೆ ಹೊಂದಿದ್ದೇನೆ. ನನಗೆ ಸರ್ಕಾರದ ವತಿಯಿಂದ ಆಶ್ರಯ ಯೋಜನೆಯಡಿ ಮನೆಯನ್ನು ನೀಡಬೇಕೆಂದು ಮನವಿ ಮಾಡಿಕೊಂಡರು.
ವಿಜಯ ನಗರ ನಿವಾಸಿ ಗೋಪಾಲಮ್ಮ ಎಂಬುವವರು, ನಾನು ಅಂಗನವಾಡಿ ಮತ್ತು ಪೋಸ್ಟ್ ಆಫೀಸ್‍ಗಳಲ್ಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ. ನನಗೆ ಯಾವುದಾರೊಂದು ಕೆಲಸ ದೊರಕಿಸಿಕೊಡಿ ಎಂದು ಮನವಿ ಮಾಡಿಕೊಂಡರು.
ಜಿಲ್ಲಾಧಿಕಾರಿಗಳು ನೀವು ಅರ್ಜಿ ಸಲ್ಲಿಸಿರುವ ಇಲಾಖೆಗಳಲ್ಲಿ ಯಾವುದಾದರು ಹುದ್ದೆ ಖಾಲಿ ಇದ್ದರೆ ಹೊರಗುತ್ತಿಗೆ ಆಧಾರದಲ್ಲಿ ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು..
ಶಂಕರ್ ವಿಹಾರ ನಗರದ ಮಹಿಳೆಯರು, ಬಡಾವಣೆಯಲ್ಲಿ ಸಮರ್ಪಕ ರಸ್ತೆ ಮತ್ತು ಚರಂಡಿ, ವ್ಯವಸ್ಥೆ ಸರಿಪಡಿಸುವಂತೆ ಮನವಿ ಮಾಡಿದರು.ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ತಿಳಿಸಿದರು.
ಕಸ್ತೂರಮ್ಮ ಎಂಬುವವರು ನನಗೆ ವಿಧವಾ ವೇತನ ಮಂಜೂರಾಗಿದ್ದು, ಇದುವರೆಗೂ ನನ್ನ ಖಾತೆಗೆ ಹಣ ಜಮಾ ಆಗಿರುವುದಿಲ್ಲ. ಈ ಕುರಿತು ವಿಚಾರಿಸಿದರೆ ನನಗೆ ಯಾವುದೇ ಮಾಹಿತಿ ತಿಳಿಯುತ್ತಿಲ್ಲ. ನನಗೆ ವಿಧವಾ ವೇತನ ಬರುವಂತೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜಾಲಿನಗರ ನಿವಾಸಿ ಆಶಾ ಅಬ್ದುಲ್ ಅಜೀಜ್‍ಸಾಭ್ ಇವರು ಸಂಧ್ಯಾ ಸುರಕ್ಷ ಯೋಜನೆಯಲ್ಲಿ ತಮಗೆ ಪಿಂಚಣಿ ಮಂಜೂರಾಗಿದ್ದು, 11 ತಿಂಗಳಾದರೂ ನಮಗೆ ಪಿಂಚಣಿ ಹಣ ಬಂದಿಲ.್ಲ ಈ ಪಿಂಚಣಿ ಹಣವನ್ನು ಒದಗಿಸಿಕೊಡುವಂತೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಸಂಬಂಧಿಸಿದ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಒಂದು ವಾರದೊಳಗೆ ಪಿಂಚಣಿ ಹಣ ಇವರ ಖಾತೆಗೆ ಹೋಗಬೇಕೆಂದು ಎ.ಡಿಯವರಿಗೆ ತಿಳಿಸಿದರು.
ನ್ಯಾಮತಿ ತಾಲ್ಲೂಕಿನ ಗಂಜೇನಹಳ್ಳಿಯ ಬಗರ ಹುಕುಂ ಸಮಿತಿಯಲ್ಲಿ ನಿರ್ಧರಿಸಿದಂತೆ ಚಿಕ್ಕತ್ತಿನಹಳ್ಳಿಯಲ್ಲಿ ಮಂಜೂರಾದ ಸಾಗುವಳಿ ಮಾಡಲು ಪಡೆದ ಭೂಮಿಯ ಮ್ಯುಟೇಷನ್ ಹಾಗೂ ಪಹಣಿ ಮಂಜೂರಾಗಿರುವುದಿಲ್ಲ. ಈ ಕುರಿತು ನ್ಯಾಮತಿ ತಾಲ್ಲೂಕು ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿ ಮನವಿ ಸಲ್ಲಿಸಿದರು.
ನಗರದ ಎಂ.ಬಿ ಕೇರಿಯ ಲಕ್ಕಮ್ಮ ಎಂಬುವವರು ತಾವು ಕಸಬಾ ಹೋಬಳಿಯ 2.12 ಗುಂಟೆ ಜಮೀನು ಇದ್ದು, ಜಮೀನು ಪೋಡಿಗಾಗಿ ಈಗಾಗಲೇ ಅರ್ಜಿ ಸಲ್ಲಸಿ ಹಲವು ವರ್ಷ ಕಳೆದರೂ ತಮ್ಮ ಹೆಸರಿಗೆ ಇನ್ನು ಪೋಡಿಯಾಗಿರುವುದಿಲ್ಲ ಎಂದು ಮನವಿ ಸಲ್ಲಿಸಿ, ಪೋಡಿ ಮಾಡಿಸಿಕೋಡಲು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಜಿಲ್ಲಾ ಪಂಚಾಯತ್‍ನ ಉಪ ಕಾರ್ಯzರ್ಶಿಗಳಿಗೆ ಈ ಸಮಸ್ಯೆಯ ಬಗ್ಗೆ ಪತ್ರ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಸಾರ್ವಜನಿಕರಿಂದ ಅನೇಕ ಅರ್ಜಿಗಳು ಬಂದಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಸಭೆಯಲ್ಲಿದ್ದ ಅಧಿಕಾರಿಗಳನ್ನುದ್ದೇಶಿಸಿ ಎಲ್ಲಾ ಇಲಾಖೆಯವರು ನಿಮ್ಮ ಕಚೇರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಲ್ಲೇ ಬಗೆಹರಿಸಿದರೆ, ಜನರು ಜಿಲ್ಲಾಡಳಿತ ಕಚೇರಿಗೆ ಬರಲು ಅವಕಾಶವಿರುವುದಿಲ್ಲ. ಇಲ್ಲಿರುವ ಎಲ್ಲಾ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಿ ಎಂದು ಹೇಳಿದರು.
ಕಾನೂನುನ್ನು ಹೊರತು ಪಡಿಸಿ ಸಾರ್ವಜನಿಕರ ಕಾಳಜಿ ವಹಿಸಿ ಕೆಲಸ ಮಾಡಬೇಕು. ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ನಡೆದುಕೊಳ್ಳುವ ರೀತಿಯಿಂದ ನಮ್ಮ ಕಚೇರಿಯ ವರ್ಚಸ್ಸುನ್ನು ಹೆಚ್ಚಿಸುತ್ತದೆ. ಆದ್ದರಿಂದ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಪ್ರೀತಿ ಮತ್ತು ಕಾಳಜಿಯಿಂದ ವರ್ತಿಸುವ ಗುಣ ಬೆಳೆಸಿಕೊಳ್ಳಿ. ಸಾರ್ವಜನಿಕರ ಮನವಿಯನ್ನು ಆಲಿಸಿಕೊಂಡು ಅವರ ಸಮಸ್ಯಗೆ ಪರಿಹಾರ ಒದಗಿಸುವ ಕಾರ್ಯವಾಗಬೇಕೆ ಎಂದು ತಿಳಿಸಿದರು.
ಸಭೆಯಲ್ಲಿ ವೃದ್ದಾಪ್ಯ ವೇತನ, ವಿಧವಾ ವೇತನ, ಖಾತೆ ವರ್ಗಾವಣೆ, ಬಸ್ ವ್ಯವಸ್ಥೆ ಕಲ್ಪಿಸುವ ಕುರಿತು, ಸಾಲ ಸೌಲಭ್ಯಗಳ ಕುರಿತು ಹಾಗೂ ಅಂಗವಿಕಲರಿಗೆ ಸ್ವಉದ್ಯೋಗಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅನೇಕ ಅಹವಾಲುಗಳನ್ನು ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್ ವಿಜಯ್‍ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ. ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ6 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ7 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ21 hours agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

