ಬಹಿರಂಗ
ಕೊರೊನಾಕ್ಕೆ ಸ್ವಾಗತ ಕೋರುತ್ತಿರುವ ಮಾಧ್ಯಮಗಳು
- ಭಾರತೀಯರಲ್ಲಿ ರೋಗನಿರೋಧಕ ಶಕ್ತಿ (ರೋ.ಶ.) ಗಟ್ಟಿ ಇದೆ; ಈ ದೇಶದ ಉಷ್ಣಾಂಶವೂ ವೈರಾಣುವನ್ನು ಹಿಮ್ಮೆಟ್ಟಿಸುವಂತಿದೆ. ಆದರೆ ಮಾಧ್ಯಮಗಳ ಡೋಲು ತಮಟೆಯಿಂದಾಗಿ ನಮ್ಮ ರೋ.ಶ. ತಗ್ಗುವ, ನಾವು ಸೋಲುವ ಸಾಧ್ಯತೆ ಹೆಚ್ಚುತ್ತಿದೆ. ಈ ಕುರಿತು ತುಸು ಉದ್ದನ್ನ ಆದರೆ ಸರಳವಾದ ವೈಜ್ಞಾನಿಕ ವಿಶ್ಲೇಷಣೆ ಇಲ್ಲಿದೆ.
-ನಾಗೇಶ್ ಹೆಗಡೆ
ದೇಹವೆಂಬ ಈ ಭದ್ರಕೋಟೆ ಗಟ್ಟಿಯಾಗಿದ್ದರೆ ಕೊರೊನಾ ವೈರಸ್ಸನ್ನು ಸುಲಭವಾಗಿ ಮಣಿಸಬಹುದು. ಇಳಿವಯಸ್ಸಿನಲ್ಲಿ ರೋಗನಿರೋಧಕ ವ್ಯವಸ್ಥೆ (ಇಮ್ಯೂನ್ ಸಿಸ್ಟಮ್) ಕಡಿಮೆಯಾಗುತ್ತದೆ ಎಂಬುದೇನೋ ನಿಜ. ಆದರೆ ಇಲ್ಲೊಂದು ಸ್ವಾರಸ್ಯ ಇದೆ. ನಮ್ಮ ವಯಸ್ಸಿಗೂ ರೋಗನಿರೋಧಕತೆಗೂ ಅಷ್ಟೇನೂ ನೇರ ಸಂಬಂಧ ಇಲ್ಲ. ನಿಮ್ಮ ವಯಸ್ಸು45 ಇದ್ದರೆ ನಿಮ್ಮ ರೋಗನಿರೋಧಕ ವ್ಯವಸ್ಥೆಗೆ 60 ವರ್ಷ ಆಗಿರಬಹುದು. ಅಥವಾ ಅದು 25ರ ಯೌವನದಲ್ಲಿರಬಹುದು.
ನಮ್ಮ ದೇಹದ ಎಲ್ಲ ಅಂಗಾಂಗಗಳೂ ಅಷ್ಟೆ.ನಿಮಗೆ 45 ವರ್ಷ ಆಗಿದ್ದರೆ ನಿಮ್ಮ ಕಣ್ಣಿಗೆ 55 ಅಥವಾ 35 ಆಗಿರಬಹುದು. ನಿಮ್ಮ ಕೂದಲಿಗೆ 55 ವರ್ಷ ಆಗಿರಬಹುದು; ನಿಮ್ಮ ಕಿವಿಗೆ 49ಮತ್ತು ದಂತಪಂಕ್ತಿಗೆ 35 ಆಗಿರಬಹುದು (ಈ ವಿಲಕ್ಷಣತೆಯ ಕುರಿತು ಅಂಕಿತ ಪುಸ್ತಕ ಪ್ರಕಟಿಸಿದ ‘ನಮ್ಮೊಳಗಿನ ಬ್ರಹ್ಮಾಂಡ’ ಎಂಬ ನನ್ನ ಪುಸ್ತಕದಲ್ಲಿ ವಿಸ್ತೃತ ಲೇಖನ ಇದೆ).
ಈ ನಮ್ಮ ರೋಗನಿರೋಧಕ ಶಕ್ತಿಯ ಲಕ್ಷಣಗಳೇನು?
ಎಲ್ಲರ ದೇಹದಲ್ಲೂ ಎರಡು ಬಗೆಯ ರೋಗನಿರೋಧಕ ಶಕ್ತಿ (ರೋ.ಶ.) ಇರುತ್ತದೆ.
(1) ಜನ್ಮತಃ ಬಂದಿರುವುದು. ನಾವು ಮಗುವಾಗಿದ್ದಾಗಲಿಂದ ಮ್ಯಾಕ್ರೊಫೇಜ್ ಮತ್ತು ನ್ಯೂಟ್ರೊಫಿಲ್ಸ್ ಹೆಸರಿನ ಕೋಶಗಳು ರಕ್ತದಲ್ಲಿ ಓಡಾಡುತ್ತಿರುತ್ತವೆ. ದೇಹದಲ್ಲಿ ರೋಗಾಣುಗಳು ಹೊಕ್ಕರೆ ಇದು ತಕ್ಷಣವೇ ದಾಳಿ ಮಾಡಲು ಸಜ್ಜಾಗಿರುತ್ತದೆ.
(2) ಸಾಂದರ್ಭಿಕ ವ್ಯವಸ್ಥೆ: ದಾಳಿಗೆ ಬಂದ ರೋಗಾಣುವಿನ ಗುರುತು ಚೆಹರೆಯನ್ನು ಸರಿಯಾಗಿ ನೋಡಿ, ಅದರ ಶಸ್ತ್ರಾಸ್ತ್ರಗಳ ಅಧ್ಯಯನ ಮಾಡಿ, ಅದನ್ನು ಮಣಿಸಬಲ್ಲ ಪ್ರತ್ಯಸ್ತ್ರಗಳನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಇಳಿಯುತ್ತದೆ. ಕೌರವ ಗದೆಯನ್ನು ಹೊತ್ತಿದ್ದರಿಂದಲೇ ಗದೆ ಹಿಡಿದ ಭೀಮನನ್ನೇ ಯುದ್ಧಕ್ಕೆ ಇಳಿಸಿದ್ದನಲ್ಲ ಆ ಕೃಷ್ಣ? ಹಾಗೇ ಇದು. ಆದರೆ ಈ ರೋ.ಶ. ತಕ್ಷಣಕ್ಕೆ ಪ್ರಕಟ ಆಗುವುದಿಲ್ಲ. ಸೂಕ್ತ ವೇಷ ಧರಿಸಿ ರಂಗಕ್ಕೆ ಬರಲು ತುಸು ಸಮಯ ಬೇಕು ತಾನೆ? ರಕ್ತದಲ್ಲಿ T ಕೋಶ, B ಕೋಶ ಹಾಗೂ ಪ್ರತಿಕಾಯಗಳು (ಆಂಟಿಬಾಡೀಸ್) ಹೀಗೆ ಹೊಸದಾಗಿ ಸೃಷ್ಟಿಯಾಗಿ ಯುದ್ಧಕ್ಕೆ ಇಳಿಯುತ್ತವೆ.
ಒಮ್ಮೆ ಇವು ವೇಷ ಧರಿಸಲು ಕಲಿತರೆ ನಮ್ಮ ದೇಹ ಅದನ್ನು ಎಂದೂ ಮರೆಯುವುದಿಲ್ಲ. ಮಮ್ಸ್ ಅಥವಾ ದಢಾರದ ರೋಗಾಣುಗಳ ವಿರುದ್ಧ ಶಸ್ತ್ರಾಸ್ತ್ರ ಸಜ್ಜಾಗಿ, ಬಾಲ್ಯದಲ್ಲಿ ಈ ರೋಗಗಳನ್ನು ಮಣಿಸಿದ್ದೇ ಆದರೆ ಮುಂದೆ ಎಂದೂ ಈ ರೋಗಗಳು ಬಾರದಂತೆ ದೇಹ ಅದೇ ಶಸ್ತ್ರಾಸ್ತ್ರವನ್ನು ಶೀಘ್ರದಲ್ಲೇ ಹಿಡಿದು ನಿಲ್ಲುತ್ತದೆ.
[ಎಲ್ಲ ಸಂದರ್ಭದಲ್ಲೂ ಹೀಗೇ ಎಂದು ಹೇಳುವಂತಿಲ್ಲ. ರೋಗಾಣು ತನ್ನ ಹಳೇ ರೂಪವನ್ನು ಕಳಚಿಹಾಕಿ ಹೊಸ ರೂಪದಲ್ಲಿ ಬಂದರೂ ಬಂದೀತು. ಕೊರೊನಾ ವೈರಸ್ಸಿಗೆ ಈ ಗುಣ ಇದೆ. 2003ರಲ್ಲಿ ‘ಸಾರ್ಸ್’ ಹೆಸರಿನಲ್ಲಿ ಬಂದ ಇದೇ ಕೊರೊನಾ ವೈರಾಣು ಈಗ ಬೇರೆ ಕವಚ ಧರಿಸಿ ಬಂದಿದೆ. ಅದಕ್ಕೇ ಈಗಿನ ಈ ಹೊಸ ರಾಮಾಯಣ.]
ಹಾಗೆಂದು ಹೆದರಬೇಕಿಲ್ಲ. ಬಹುಪಾಲು ಜನರಲ್ಲಿ ಹುಟ್ಟಿದಾಗಿನಿಂದ ಬಂದ ರೋ.ಶ. ಸಾಕಷ್ಟು ಗಟ್ಟಿಯಾಗಿಯೇ ಇರುತ್ತದೆ. ಕೋವಿಡ್-೧೯ ಕಾಯಿಲೆ ಬಂದವರಲ್ಲಿ ಅರ್ಧಕ್ಕರ್ಧ ಜನಕ್ಕೆ ಕಾಯಿಲೆಯ ಲಕ್ಷಣಗಳು ಎದ್ದುಕಾಣುವ ಮೊದಲೇ ರೋಗಾಣು ನಿರ್ನಾಮ ಆಗಿರುತ್ತದೆ. ಇನ್ನು ಕೆಲವಷ್ಟು ಜನರು ಒಣಕೆಮ್ಮು, ಜ್ವರದಿಂದ ನಾಲ್ಕಾರು ದಿನ ಫಜೀತಿಪಟ್ಟರೂ ಅವರು ಆಸ್ಪತ್ರೆಗೆ ಧಾವಿಸಬೇಕಾಗಿಲ್ಲ. ನಾರು, ಬೇರು, ಶುಂಠಿ- ಅಮೃತಬಳ್ಳಿ ಕಷಾಯ, ಬೆಚ್ಚಗಿನ ಉಪ್ಪುನೀರಲ್ಲಿ ಬಾಯಿ ಮುಕ್ಕಳಿಸುವುದೇ ಮುಂತಾದ ಮನೆಮದ್ದು ಮಾಡಿಸಿಕೊಳ್ಳುತ್ತ ವಿಶ್ರಾಂತ ಸ್ಥಿತಿಯಲ್ಲಿದ್ದರೆ ಸಾಕು.ಆಂಟಿಬಯಾಟಿಕ್ಸ್ (ಜೀವಿರೋಧಕ ಮಾತ್ರೆ) ಕೂಡ ಬೇಕಾಗುವುದಿಲ್ಲ. ಇನ್ನು ಮೂರನೆಯ ಕೆಟೆಗರಿಯವರು ಆಸ್ಪತ್ರೆಗೆ ಹೋಗಿ ಔಷಧಗಳ ಸಾಗರದಲ್ಲಿ ಮಿಂದೆದ್ದು ನಿಂತು ಗುಣಮುಖರಾಗಿ ಬರುತ್ತಾರೆ.
ತೀರ ಅಪರೂಪಕ್ಕೆ ನೂರರಲ್ಲಿ ಒಬ್ಬಿಬ್ಬರಿಗೆ (ಮಾತ್ರ) ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು, ಉಸಿರಾಟವೂ ಕಷ್ಟವಾಗಿ, ಕೃತಕ ಉಸಿರಾಟದ ವೆಂಟಿಲೇಟರ್ ಹಾಕಿಸಿಕೊಳ್ಳಬೇಕಾಗುತ್ತದೆ. ಅವರ ವಿಷಯ ಕೊಂಚ ಕಷ್ಟ. ಅಂಥವರಲ್ಲಿ ರೋ.ಶ. ದುರ್ಬಲವಾಗಿರುತ್ತದೆ. ಒಂದೋ ಅವರು ತೀರ ಇಳಿವಯಸ್ಸಿನವರಾಗಿ, ಸಂಸಾರಬಂಧನವನ್ನು ಕಳಚಿಕೊಳ್ಳಲು ಸಿದ್ಧರಾಗಿರಬಹುದು. ಅಥವಾ ಕಿರಿ ವಯಸ್ಸಿನವರಾಗಿದ್ದರೂ ಅವರ ರೋ.ಶ.ಕ್ಕೆ ಜಾಸ್ತಿ ವಯಸ್ಸಾಗಿರಬಹುದು. ಅಂದರೆ, ಈಗಾಗಲೇ ಸ್ಥೂಲ ದೇಹಿಗಳಾಗಿ, ಇಲ್ಲವೆ ಸಕ್ಕರೆ ರೋಗಿಗಳಾಗಿ, ಅಥವಾ ಹೃದಯಸಂಬಂಧೀ ಕಾಯಿಲೆಯವರಾಗಿ ಅಥವಾ ಬೀಡಿ-ಸಿಗರೇಟು ಚಟದಿಂದಾಗಿ ಅವರ ಶ್ವಾಸಕೋಶ ಸಾಕಷ್ಟು ಆಗಲೇ ಸುಸ್ತಾಗಿರಬಹುದು. ಅಂಥವರು ಹುಷಾರಾಗಿರಬೇಕು.
ಹಾಗೆಂದು ಕೊರೊನಾ ಬಂತೆಂದು ಅವರೂ ತೀರ ಗಾಬರಿ ಪಡಬೇಕಿಲ್ಲ. ಫ್ರಾನ್ಸಿನ ಪಾಶ್ಚರ್ ಸಂಶೋಧನಾ ಸಂಸ್ಥೆಯ ತಜ್ಞರ 2018ರ ಅಧ್ಯಯನದ ಪ್ರಕಾರ, ಚಿಕ್ಕಂದಿನಿಂದ ನಾನಾ ಬಗೆಯ ವೈರಾಣು, ಬ್ಯಾಕ್ಟೀರಿಯಾ, ಜಂತುಹುಳುವಿನ ಬಾಧೆಯನ್ನು ಎದುರಿಸಿದ ದೇಹದಲ್ಲಿ ಸಾಕಷ್ಟು ಬಗೆಯ ಶಸ್ತ್ರಾಸ್ತ್ರಗಳು ಜಮಾ ಆಗಿರುತ್ತವೆ. ಒಂದಲ್ಲ ಒಂದು ಶಸ್ತ್ರದಿಂದ ಕೊರೊನಾ ಕೂಡ ಹಿಮ್ಮೆಟ್ಟಬಹುದು. ಆದರೆ ಬಾಲ್ಯದಿಂದಲೂ ತೀರ ಶುಚಿಯಾದ ನೀರು, ತೀರ ಶುದ್ಧಾತಿಶುದ್ಧ ಆಹಾರ ಸೇವಿಸುತ್ತ ಶುದ್ಧೋದನನ ಅರಮನೆಯ ಮಕ್ಕಳಂತೆ ಬೆಳೆದಿದ್ದರೆ ಅಂಥವರ ದೇಹದಲ್ಲಿ ರೋಗನಿರೋಧಕ ಶಸ್ತ್ರಾಸ್ತ್ರಗಳ ಸಂಖ್ಯೆ ಕಡಿಮೆ ಇರುತ್ತದೆ. (ಯುರೋಪ್ ಅಮೆರಿಕದಲ್ಲಿ ಎಷ್ಟೆಲ್ಲ ಜನರನ್ನು ಕೋವಿಡ್ ಕೊಲ್ಲುತ್ತಿದೆ.) ಇದೀಗ ಬಂದ ಮಾಹಿತಿಯ ಪ್ರಕಾರ, ಬಾಲ್ಯದಲ್ಲಿ ಕ್ಷಯನಿರೋಧಕ ಬಿಸಿಜಿ ಚುಚ್ಚುಮದ್ದನ್ನು ಹಾಕಿಸಿಕೊಂಡಿದ್ದರೆ ಅಂಥವರಿಗೆ ಕೊರೊನಾ ಅಷ್ಟಾಗಿ ಬಾಧಿಸುವುದಿಲ್ಲವಂತೆ. ಭಾರತ, ಜಪಾನ್ ಮುಂತಾದ ಕೆಲವೇ ದೇಶಗಳಲ್ಲಿ ಹಿಂದೆಲ್ಲ ಬಿಸಿಜಿ ಕಡ್ಡಾಯವಾಗಿತ್ತು. ಇಂಥ ದೇಶಗಳಲ್ಲಿ ಕೊರೊನಾ ಕುಣಿದಾಟ ಇದುವರೆಗೆ ಕಡಿಮೆ ಇದೆ.
ಇವೆಲ್ಲಕ್ಕಿಂತ ಮುಖ್ಯವಾಗಿ ರೋ.ಶ. ನಮ್ಮನಮ್ಮ ಜೀನ್ಸ್ ಅಂದರೆ ರಕ್ತಗುಣದಲ್ಲಿ ಬಂದಿರುತ್ತದೆ. ನಮ್ಮ ತಾತ, ಮುತ್ತಜ್ಜಿಯರು ಎಷ್ಟೆಷ್ಟು ಬಗೆಯ ರೋಗಗಳನ್ನು ಎದುರಿಸಿ ಬದುಕಿದ್ದರಿಂದಲೇ ನಾವು ಇಂದು ಇಲ್ಲಿದ್ದೇವೆ. ಯುರೋಪ್ ಅಮೆರಿಕದಂತಹ ಚಳಿಪ್ರದೇಶಗಳಲ್ಲಿ ಹಿಂದಿನ ಕಾಲದಲ್ಲೂ ರೋಗಾಣುಗಳ ಸಂಖ್ಯೆ ತೀರ ಕಮ್ಮಿ ಇತ್ತು. ಹಿಮಪ್ರದೇಶಗಳಲ್ಲಿ ಸೊಳ್ಳೆ ಕೂಡ ಇರುವುದಿಲ್ಲ. ಹಾಗಾಗಿ ಅವರ ವಂಶಗುಣದಲ್ಲಿ ರೋ.ಶ. ಸಹಜವಾಗಿ ಕಡಿಮೆ ಇತ್ತು. ಆದ್ದರಿಂದಲೇ ಪ್ಲೇಗು, ಸಿಡುಬಿನಂಥ ಕಾಯಿಲೆಗಳು ಬಂದೆರಗಿದಾಗ ಅಲ್ಲಿಯ ಜನರು ಅಕ್ಷರಶಃ ಹುಳಗಳಂತೆ ಸಾಯುತ್ತಿದ್ದರು.
ಈಗಲೂ ಸಾಮಾನ್ಯ ನೆಗಡಿ ಜ್ವರಕ್ಕೇ ಅಮೆರಿಕದಲ್ಲಿ ದಿನಕ್ಕೆ ಸರಾಸರಿ ನೂರು ಜನರು (ಹೌದು, ಪ್ರತಿದಿನಕ್ಕೆ ನೂರು; ವರ್ಷಕ್ಕೆ 36ಸಾವಿರ ಜನರು) ಸಾಯುತ್ತಾರೆ. ಅದಕ್ಕೆ ಲಸಿಕೆ ಪಸಿಕೆ,ನೂರೊಂದು ಔಷಧಗಳು ಇದ್ದರೂ ಫ್ಲೂ ರೋಗಾಣು ಅಷ್ಟೊಂದು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಅವರ ದುರದೃಷ್ಟಕ್ಕೆ ಈಗಿನ ಈ ಕೊರೊನಾ ಕೂಡ ಚಳಿಮಂಜಿನ ದಿನಗಳಲ್ಲಿ (ಉಷ್ಣತೆ 7ರಿಂದ 25 ಡಿಗ್ರಿ ಸೆ. ಇದ್ದಲ್ಲಿ) ತುಂಬ ಉಗ್ರವಾಗಿರುತ್ತದೆ. ವೈರಾಣುಗಳು ಪಬ್‌ಗಳಲ್ಲಿ, ಸೂಪರ್ ಬಝಾರ್‌ಗಳಲ್ಲಿ ಬಾಗಿಲ ಹಿಡಿಕೆಗಳ ಮೇಲೆ, ಎಸ್ಕಲೇಟರಿನ ಜಾರುಪಟ್ಟಿಯ ಮೇಲೆ, ಲಿಫ್ಟ್ ಎಂಬ ಏರುಬಂಡಿಯಲ್ಲಿರುವ ಬಟನ್‌ಗಳ ಮೇಲೆ ಹೆಚ್ಚಿನ ಅವಧಿಯಲ್ಲಿ ಜೀವಂತವಾಗಿ ಕೂತಿರುತ್ತವೆ. ಪಾರ್ಕಿನಲ್ಲಿ, ಫುಟ್‌ಪಾತ್ ನಲ್ಲಿ, ರೈಲಿನಲ್ಲಿ, ಲಿಫ್ಟ್‌ನಲ್ಲಿ ಆಲಿಂಗನ, ಚುಂಬನ ಇದ್ದಲ್ಲಂತೂ ವೈರಾಣುವಿಗೆ ಮಜವೋ ಮಜ!
ನಮ್ಮ ದೇಹ, ನಮ್ಮ ದೇಶ ಎರಡೂ ಗಟ್ಟಿಮುಟ್ಟಾಗಿದೆ. ಇಲ್ಲಿ ಬೇಸಿಗೆ ಉಗ್ರವಾಗಿದೆ, ವೈರಾಣುವಿನ ಉಗ್ರತೆಯನ್ನು ಗಾಳಿಯೇ ಕಮ್ಮಿ ಮಾಡಿರುತ್ತದೆ. ಜೊತೆಗೆ ಇಲ್ಲಿನ ಹತ್ತಾರು, ಅಷ್ಟೇಕೆ ನೂರಾರು ಬಗೆಯ ರೋಗಾಣುಗಳ ಸಂತೆಯನ್ನೇ ನೋಡಿ ಕೊರೊನಾ ಇನ್ನಷ್ಟು ನರ್ವಸ್ ಆಗಲೂ ಬಹುದು. ಆ ಸಂತೆಯಲ್ಲಿ ಓಡಾಡುತ್ತ ನಾವು ನಮ್ಮ ದೇಹದಲ್ಲಿ ಎಷ್ಟೊಂದು ರೋ.ಶ. ಶಸ್ತ್ರಾಸ್ತ್ರಗಳನ್ನು ಪೇರಿಸಿಕೊಂಡಿದ್ದೇವೆ. ಅಮೆರಿಕದಲ್ಲಿ ಫ್ಲೂ ರೋಗದಿಂದ ಸಾಯುವವರ ಸಂಖ್ಯೆಯನ್ನು ನೆನಪಿಸಿಕೊಳ್ಳಿ. ನಾವೂ ವರ್ಷಕ್ಕೆ ಎಷ್ಟೊಂದು ಬಾರಿ ಫ್ಲೂ-ನೆಗಡಿ ಎದುರಿಸುವುದಿಲ್ಲ? ನಮ್ಮಲ್ಲಿ ನೆಗಡಿಜ್ವರದ ಸಾವಿನ ಸಂಖ್ಯೆ ಅಮೆರಿಕದ ಹತ್ತರಲ್ಲೊಂದು ಪಾಲೂ ಇಲ್ಲ.
ಆದರೂ ನಾವು ಎಚ್ಚರದಿಂದಿರಬೇಕು. ಯಾಕೆ ಗೊತ್ತೆ? ನಮ್ಮೊಳಗಿನ ರೋ.ಶ.ಕ್ಕೆ ಒಂದು ಸಣ್ಣ ದೌರ್ಬಲ್ಯವೂ ಇದೆ. ನಮ್ಮ ಮನಸ್ಸು ಅಧೀರವಾದರೆ, ನಾವು ಧೈರ್ಯಗುಂದಿದರೆ ಈ ರೋ.ಶ. ಕೂಡ ನರ್ವಸ್ ಆಗುತ್ತದೆ. ಬೇಕಿದ್ದರೆ ಯಾವುದೇ ಮನೋವಿಜ್ಞಾನಿಗಳನ್ನು ಕೇಳಿ ನೋಡಿ. ಮನೋಬಲಕ್ಕೂ ದೇಹಬಲಕ್ಕೂ ನೇರಸಂಬಂಧ ಇದೆ.
ಮಾಧ್ಯಮಗಳ ಈ ಬಗೆಯ ಡೋಲು ತಮಟೆಯ ಅಬ್ಬರದಿಂದಾಗಿ ನಮ್ಮ ಆತ್ಮವಿಶ್ವಾಸ, ನಮ್ಮ ರೋಗನಿರೋಧಕ ಶಕ್ತಿ ಕೂಡ ಕುಂದಬಹುದು. ಟಿವಿ ನೋಡುತ್ತ ಕೂತಂತೆ ಗಂಟಲಲ್ಲಿ ಸಣ್ಣ ಕೆರೆತವೂ ದೊಡ್ಡದಾಗಿ, ಸಣ್ಣ ಆಕ್ಷೀ ಕೂಡ ದೊಡ್ಡ ಸೀನನ್ನೇ ಸೃಷ್ಟಿ ಮಾಡಿ ನಮ್ಮನ್ನು ಮತ್ತು ಇಡೀ ಕುಟುಂಬವನ್ನು ತಬ್ಬಿಬ್ಬು ಮಾಡುತ್ತದೆ. ನಮ್ಮೊಳಗಿನ ರೋ.ಶ. ‘’ತೋಳ ಬಂತಲೇ ತೋಳ’’ದ ಕತೆಯಂತೆ ಮತ್ತೆ ಮತ್ತೆ ಧಿಗ್ಗನೆದ್ದು ಮತ್ತೆ ಮತ್ತೆ ಹೈರಾಣಾಗಿ ಮುದುಡುತ್ತದೆ.
ಅಷ್ಟೇ ಅಲ್ಲ, ಕಣ್ಣಿಗೆ ರಾಚುವ ಪ್ರತಿಯೊಂದು ಮುಖವಾಡವೂ ಕೊರೊನಾವನ್ನು ಸಂಕೇತಿಸುತ್ತದೆ. ಸಮಾಜದಲ್ಲಿ ಮುಗುಳ್ನಗೆಯೇ ಮರೆತಂತಾಗಿದೆ. ಭಯ, ಅಧೀರತೆ ಎಲ್ಲೆಲ್ಲೂ ತಾಂಡವವಾಡತೊಗಿದೆ. ಕೊರೊನಾ ಕೌರವ ಪಡೆಯನ್ನು ಕಂಡಾಕ್ಷಣ ಅಸಲೀ ಕದನ ಆರಂಭವಾಗುವ ಮೊದಲೇ ನಾವು ಉತ್ತರ ಕುಮಾರರಾಗುತ್ತಿದ್ದೇವೆ. ಅರ್ಜುನ ಅವಿತಿರುತ್ತಾನೆ.
ಕೊರೊನಾ ವೈರಾಣು ಜಾಣ. ವಿಮಾನ ಏರಿದರೆ ಜೆಟ್ ವೇಗದಲ್ಲಿ ಚಲಿಸಬಹುದು ಎಂಬುದು ಅದಕ್ಕೆ ಗೊತ್ತಾಗಿದೆ. ಯುರೋಪ್, ಅಮೆರಿಕಕ್ಕೆ ಹೋದರೆ ಪುಷ್ಕಳ ಬೇಟೆ ಸಿಗುತ್ತದೆ ಎಂಬುದೂ ಅದಕ್ಕೆ ಗೊತ್ತಿದೆ. ಹೇಗೂ ಮೀಡಿಯಾ ತನ್ನ ಸ್ವಾಗತಕ್ಕೆ ತುತ್ತೂರಿ ದುಂದುಭಿ ಮೊಳಗಿಸುತ್ತ, ಕಂಡಕಂಡವರಿಗೆ ಮುಖವಾಡ ತೊಡಿಸುತ್ತ, ಸಮೂಹಸನ್ನಿಯನ್ನು ಸೃಷ್ಟಿಸಿ ಇಡೀ ನಾಗರಿಕತೆಯ ಜಂಘಾಬಲವನ್ನೇ ಉಡುಗಿಸುತ್ತಿದೆ. ವಿಮಾನಗಳನ್ನು ನೆಲಕ್ಕಿಳಿಸಿ, ಹೈಸ್ಪೀಡ್ ರೈಲುಗಳನ್ನು, ಕಾರುಗಳನ್ನು ಹಡಗುಗಗಳನ್ನು ನಿಂತಲ್ಲೇ ನಿಲ್ಲಿಸಿದ್ದಷ್ಟೇ ಅಲ್ಲ, ಲಕ್ಷುರಿ ಕಾರುಗಳನ್ನು ತಯಾರಿಸುತ್ತಿದ್ದ ಜಿಎಮ್, ಫೋರ್ಡ್, ಟಾಟಾ ಮಹೀಂದ್ರಗಳೆಲ್ಲ ತಮ್ಮ ಕಾರ್ಖಾನೆಗಳಲ್ಲಿ ವೆಂಟಿಲೇಟರ್‌ಗಳನ್ನೂ ಟೆಸ್ಟಿಂಗ್ ಕಿಟ್‌ಗಳನ್ನೂ ತಯಾರಿಸಲು ತೊಡಗುವಂತೆ ಮಾಡಿದೆ. ಮಹಾನ್ ರಾಷ್ಟ್ರನಾಯಕರುಗಳನ್ನು ಟಿವಿ ಕ್ಯಾಮರಾಗಳ ಎದುರಿಗೆ ತಂದು ನಿಲ್ಲಿಸಿದೆ.
ಈ ಮಹಾನ್ ನಾಯಕರುಗಳಿಗೆ ಕೊರೊನಾ ಒಂದು ಹೊಸ ಪಾಠವನ್ನು ಕಲಿಸುತ್ತಿದೆ. ರಾಷ್ಟ್ರ ರಕ್ಷಣೆ ಎಂದರೆ ಕೇವಲ ಅಣ್ವಸ್ತ್ರಗಳನ್ನೋ ಫೈಟರ್ ಜೆಟ್‌ಗಳನ್ನೋ ಸಬ್ಮರೀನ್‌ಗಳನ್ನೋ ಪೇರಿಸುವುದಷ್ಟೇ ಅಲ್ಲ; ಸಮುದಾಯ ಆರೋಗ್ಯ, ಗುಣಮಟ್ಟದ ಔಷಧ, ಕೈಗೆಟಕುವ ಮಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆ, ಸಮರ್ಪಣ ಮನೋಭಾವದ ಸ್ವಾಸ್ಥ್ಯ ಸಿಬ್ಬಂದಿ ಕೂಡ ರಕ್ಷಣೆಯ ಭಾಗವೇ ಆಗಬೇಕೆಂಬುದನ್ನು ಅದು ಕಲಿಸುತ್ತಿದೆ.
ಹಾಗೆಯೇ ನಗರಗಳಿಂದ ಗುಳೆಹೊರಟ ಬರಿಹೊಟ್ಟೆಯ, ಖಾಲಿ ಕಿಸೆಯ, ಬೊಬ್ಬೆಗಾಲಿನ ಶ್ರಮಜೀವಿಗಳ ಮೂಲಕ ಅದು ಸರಕಾರಗಳಿಗೆ ಇನ್ನೂ ಒಂದು ಪಾಠವನ್ನು ಕಲಿಸುತ್ತಿದೆ. ರಾಷ್ಟ್ರದ ಘನತೆ ಎಂದರೆ ಕೇವಲ ಥಳಥಳಿಸುವ ಐಟಿ ಪಾರ್ಕ್, ಏರ್ಪೋರ್ಟ್, ಭರ್ಜರಿ ಹೈವೇ, ಪೆಟ್ರೋಲ್ ಬಂಕ್ ಇದ್ದರೆ ಸಾಲದು; ಊರೂರಲ್ಲಿ ನೆರಳಿಗೆ ಒಂದಿಷ್ಟು ಗಿಡಮರಗಳು, ತುರ್ತು ಆಸರೆಗೆ ಉತ್ತಮ ಶಾಲೆ ಇರಬೇಕು, ಶುದ್ಧ ನೀರು-ಶೌಚದ ವ್ಯವಸ್ಥೆ ಇರಬೇಕು. ಕಡೇಪಕ್ಷ ರಕ್ತಸೋರುವ ಕಾಲುಗಳಿಗೆ ಬ್ಯಾಂಡೇಜ್ ಪಟ್ಟಿ ಸಿಗುವಂಥ ಪ್ರಾಥಮಿಕ ಶುಶ್ರೂಷೆಯ ಸೌಲಭ್ಯ ಇರಬೇಕು ಎಂದು ಅದು ಹೇಳುತ್ತಿದೆ.
ಮುಂದಿನ ಗಣರಾಜ್ಯದ ಪರೇಡ್‌ನಲ್ಲಿ ಮಿಲಿಟರಿ ಫೇರಿಗಿಂತ ಮುಂಚೂಣಿಯಲ್ಲಿ ಸುಸಜ್ಜಿತ ಆಸ್ಪತ್ರೆಯ, ಸುಸಜ್ಜಿತ ಶಾಲೆಯ ಮೆರವಣಿಗೆಯ ವ್ಯವಸ್ಥೆ ಮಾಡಿ ಎಂದು ಅದು ಹೇಳುತ್ತಿದೆಯೇನೊ.ಇದನ್ನೆಲ್ಲ ಅಳೆದು ತೂಗಿ ನೋಡಿದರೆ, ಪ್ರಾಯಶಃ ಕೊರೊನಾಕ್ಕೆ ನಾವು ಶಾಪ ಹಾಕಬೇಕಿಲ್ಲ. ಅದನ್ನು ಮೆರೆಸಿ ಕುಣಿಸುತ್ತಿರುವ ಮಾಧ್ಯಮವನ್ನೂ ಶಪಿಸಬೇಕಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ


