Connect with us

ಅಂತರಂಗ

ಅರಿಮೆಯ ಅರಿವಿರಲಿ-21 : ಬಿತ್ತಿದಂತೆ ಬೆಳೆ

Published

on

Art : Michel Belleau
  • ಯೋಗೇಶ್ ಮಾಸ್ಟರ್

ಕೆಲವರಿಗೆ ದೇಹದಲ್ಲಿ ಯಾವುದಾದರೊಂದು ಸಮಸ್ಯೆ ಇರುತ್ತದೆ. ಹೃದಯದ್ದೋ, ಮೂತ್ರಪಿಂಡಗಳದ್ದೋ, ಕರುಳಿನದ್ದೋ, ಕಿವಿಯದೋ; ಎಂತದ್ದೋ. ಅದು ಅವರ ಯಾವ ಪಾಪಕ್ಕೂ ಅಲ್ಲ, ತಪ್ಪಿಗೂ ಅಲ್ಲ. ಮ್ಯಾನ್ಯುಫ್ಯಾಕ್ಚರಿಂಗ್ ಡಿಫೆಕ್ಟ್ ಅಂತಾರಲ್ಲಾ ಹಾಗೆ. ಪುಟ್ಟ ಪುಟ್ಟ ಮಕ್ಕಳಿಗೆ ಸಕ್ಕರೆ ಖಾಯಿಲೆ, ಹುಟ್ಟಿದ ಮಗುವಿಗೇ ಹೃದಯದ ಸಮಸ್ಯೆ; ಹೀಗೆಲ್ಲಾ ಇರುತ್ತದೆ. ಅದು ಗಮನಕ್ಕೆ ಬಂದಾಗ ತಜ್ಞರ ಬಳಿ ತೋರಿಸಿ ಅದಕ್ಕೆ ಚಿಕಿತ್ಸೆ ಕೊಡುತ್ತಾ ಅದನ್ನು ಕಡಿಮೆ ಮಾಡಿಕೊಂಡು ಬರುತ್ತೇವೆ. ಬಹಳಷ್ಟು ಬಾರಿ ಅದು ಯಶಸ್ಸನ್ನು ಕಾಣುತ್ತದೆ.

ಅದೇ ರೀತಿಯಲ್ಲಿ ಕೆಲವು ಮಾನಸಿಕ ಸಮಸ್ಯೆಗಳೂ ಕೆಲವರಿಗೆ ಮ್ಯಾನ್ಯುಫ್ಯಾಕ್ಚರಿಂಗ್ ಡಿಫೆಕ್ಟ್ ರೀತಿಯಲ್ಲಿ ಇರುತ್ತದೆ. ಆದರೆ ನಮ್ಮ ಕರ್ಮಕ್ಕೆ ಅದು ದೈಹಿಕ ಸಮಸ್ಯೆಯ ರೀತಿಯಲ್ಲಿ ಭೌತಿಕವಾಗಿ ಕಾಣುವುದಿಲ್ಲ. ಕೈಗೂಸಾಗಿದ್ದರೂ ಹೃದಯದ ಸಮಸ್ಯೆ, ಮೂತ್ರ ಪಿಂಡದ ಸಮಸ್ಯೆಗಳನ್ನು ಗುರುತಿಸಲು ಸಾಧ್ಯವಾಗುವಂತೆ ಬಹಳ ಸಣ್ಣ ಮಕ್ಕಳಲ್ಲಿ ಕೆಲವು ಬಗೆಯ ಮಾನಸಿಕ ಸಮಸ್ಯೆಗಳನ್ನು ಅರಿಮೆಗಳನ್ನು ಗುರುತಿಸಲು ಸಾಧ್ಯವಾಗುವುದಿಲ್ಲ. ಮಗುವಾಗಿ ಬೆಳೆಬೆಳೆಯುತ್ತಿದ್ದಾಗ ಕೆಲವು ಅನುಚಿತ ವರ್ತನೆಗಳನ್ನು, ಅವೈಚಾರಿಕ ನಡವಳಿಕೆಗಳನ್ನು, ಅಸಹಜ ಗುಣಗಳನ್ನು ಕಂಡರೂ ನಮ್ಮ ಧನಾತ್ಮಕ ಧೋರಣೆಯ ಕುಟುಂಬ, “ಮಗು ಬೆಳಿತಾ ಬೆಳಿತಾ ಸರಿ ಹೋಗುತ್ತದೆ” ಎಂದು ಸುಮ್ಮನಾಗುತ್ತದೆ. ತಜ್ಞರೊಂದಿಗೆ ಸಂವಹನ ಮಾಡುವುದಿಲ್ಲ. ಸಂಪರ್ಕಿಸುವುದೂ ಇಲ್ಲ. ಅದೆಲ್ಲಾ ಇರಲಿ, ಅದಕ್ಕೆಂದು ತಜ್ಞರು ಇದ್ದಾರೆಂದೂ ಗೊತ್ತಿರುವುದಿಲ್ಲ.

ಇದು ಚಿಕಿತ್ಸೆ ಕೊಡಬೇಕಾದ ರೋಗವೆಂದು ಎಂದಿಗೂ ಅಂದುಕೊಳ್ಳುವುದಿಲ್ಲ. ದೈಹಿಕ ಸಮಸ್ಯೆಗಳಿಗೆ ಗಮನ ಕೊಟ್ಟಂತೆ ಮಾನಸಿಕ ಸಮಸ್ಯೆಗಳಿಗೂ ಗಮನ ಕೊಟ್ಟಿದ್ದರೆ, ನಾವೆಲ್ಲರೂ ಇಷ್ಟುಹೊತ್ತಿಗಾಗಲೇ ಬಹಳಷ್ಟು ಆರೋಗ್ಯಕರವಾದಂತಹ ಸಮಾಜದಲ್ಲಿ ಉಸಿರಾಡಬಹುದಿತ್ತು. ಬೆಳೆಯುವ ಪೈರು ಮೊಳಕೆಯಲ್ಲಿ, ಬಿತ್ತಿದಂತೆ ಬೆಳೆ, ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ? ಮೂರರ ಬುದ್ಧಿ ನೂರರ ತನಕ – ಈ ಗಾದೆಗಳನ್ನು ಮಾತ್ರ ಕೊಂಡಾಡುತ್ತೇವೆ ‘ವೇದ ಸುಳ್ಳಾದರೂ ಗಾದೆ ಸುಳ್ಳಾಗದು’ ಎಂದು. ಆದರೆ ಆ ಗಾದೆಗಳು ನೇರವಾಗಿ ಮಕ್ಕಳ ಮಾನಸಿಕ ಸ್ಥಿತಿಯನ್ನು ಕುರಿತೇ ಹೇಳಿರುವುದು ಎಂಬುದನ್ನು ಮಾತ್ರ ಬಹುದೊಡ್ಡ ಸಮೂಹವು ಅರ್ಥ ಮಾಡಿಕೊಳ್ಳಲೇ ಇಲ್ಲ.

ಬಿತ್ತುವುದು ಬೀಳಿಸುವುದು

ಅರಿಮೆಗಳೆಂಬ ಬೀಜಗಳನ್ನು ಎಳೆಯ ಹಾಗೂ ಫಲವತ್ತಾದ ಮನಗಳಲ್ಲಿ ಬಿತ್ತಲಾಗುತ್ತದೆ. ಅವು ಹುಲುಸಾಗಿ ಮತ್ತು ಬಲವಾಗಿ ಬೆಳೆದು ನಿಂತಾಗ ಅದನ್ನು ಕತ್ತರಿಸಿ ಹಾಕಲು ಕುಟುಂಬ ಮತ್ತು ಸಮಾಜ ಹೆಣಗಾಡುತ್ತದೆ. ಆಗ ಕಷ್ಟ ಸಾಧ್ಯ. ಯಶಸ್ಸಿನ ಗಾಥೆಗಳು ಇಲ್ಲವೇ ಇಲ್ಲವೆನಿಸುವಷ್ಟು ತೀರಾ ಕಡಿಮೆ.

ಮನೆಗಳಲ್ಲಿ, ದೊಡ್ಡ ದೊಡ್ದ ವಿದ್ಯಾವಂತರ ಮತ್ತು ಸ್ಥಿತಿವಂತರ ಮನೆಗಳಲ್ಲಿ ಕಂಡಿದ್ದೇನೆ. ಎದುರಿಗೇ ಎರಡು ಮಕ್ಕಳನ್ನು ನಿಲ್ಲಿಸಿಕೊಂಡು ಈ ಮಗು ಜಾಣ, ಎಲ್ಲದರಲ್ಲೂ ಚುರುಕು, ಮತ್ತೊಂದು ಮಗು ಅಷ್ಟು ಚುರುಕಿಲ್ಲ, ಎಲ್ಲದರಲ್ಲೂ ನಿಧಾನ; ಎನ್ನುವುದನ್ನು. ಚುರುಕಿಲ್ಲ ಎಂದು ಎಲ್ಲರ ಎದುರು ಪಟ್ಟಾಭಿಷೇಕ ಮಾಡಿಸಿಕೊಂಡು ಪದವಿ ಪಡೆಯುವ ಮಗುವು ತಾನು ಚುರುಕಿಲ್ಲದರ ಬಗ್ಗೆ ಕೀಳರಿಮೆಯಿಂದ ನರಳುವುದರ ಜೊತೆಜೊತೆಗೆ ತನ್ನ ಕಡೆಗಣಿಸಲು ಬಳಸುವ ಚುರುಕಿರುವ ಮಗುವಿನ ಬಗ್ಗೆ ದ್ವೇಷ ಮತ್ತು ಅಸೂಯೆಯನ್ನು ಬೆಳೆಸಿಕೊಳ್ಳುತ್ತದೆ. ಇದು ನಮ್ಮ ಪೋಷಕರಿಗೆ ಅರ್ಥವೇ ಆಗುವುದಿಲ್ಲ.

ಇನ್ನು ಶಾಲೆಯಲ್ಲಿ ಕೆಲವು ಮಕ್ಕಳಿಗೆ ಎ+, ಬಿ+, ರ್ಯಾಂಕ್ ಇತ್ಯಾದಿಗಳನ್ನು ನೀಡುತ್ತಾ ಮತ್ತೆ ಕೆಲವು ಮಕ್ಕಳಿಗೆ ಸಿ, ಡಿ, ಇತ್ಯಾದಿಗಳನ್ನು ಕೊಡುತ್ತಾ, ಆ ಮಕ್ಕಳಲ್ಲಿ ಕೀಳರಿಮೆಯನ್ನು ಹುಟ್ಟು ಹಾಕುವ ಶಿಕ್ಷಣ ವ್ಯವಸ್ಥೆಗೆ ಮೌಲ್ಯಮಾಪನದ ಮತ್ತೊಂದು ಪರ್ಯಾಯ ವ್ಯವಸ್ಥೆಯನ್ನು ಕಂಡುಕೊಳ್ಳಲಾಗಿಲ್ಲ. ಮಕ್ಕಳ ಎಳೆಯ ಮನಸ್ಸುಗಳಲ್ಲಿ ಅರಿಮೆಗಳನ್ನು ಬಿತ್ತುತ್ತಿದ್ದೇವೆ ಎಂಬ ನೈತಿಕ ಪ್ರಜ್ಞೆ ಅವರಲ್ಲಿ ಮೂಡಿಯೇ ಇಲ್ಲ. ಏಕೆಂದರೆ ಮಾನಸಿಕವಾದಂತಹ ವಿಷಯಕ್ಕೆ ಅವರು ‘ಕೇರ್’ ಮಾಡಿಯೇ ಇಲ್ಲ.

ಸ್ಪರ್ಧೆಗಳನ್ನು ಮಾಡಿ ಗೆದ್ದವರಿಗೆ ಪರಾಕುಗಳನ್ನು ಹಾಕುವಾಗ, ಫಲಕ, ಪದಕ ಮತ್ತು ಇನಾಮುಗಳನ್ನು ಕೊಟ್ಟು ಹೆಸರುಗಳನ್ನು ಕೂಗಿ ಕರೆಯುವಾಗ ಸೋತವರು ಎಂಬ ಭಾವವನ್ನು ಹುಟ್ಟಿಸಿ ಹಲವು ಜೀವಗಳಲ್ಲಿ ಕೀಳರಿಮೆಯನ್ನು ಹುಟ್ಟಿ ಹಾಕುತ್ತಿದ್ದೇವೆ ಎಂಬ ಪ್ರಜ್ಞೆ ಸ್ಪರ್ಧಾತ್ಮಕ ಸಮಾಜಕ್ಕೆ ಬಂದೇ ಇಲ್ಲ. ಇದನ್ನೆಲ್ಲಾ ಸ್ಪೋರ್ಟೀವ್ ಆಗಿ ತಗೋಬೇಕು. ಗೆಲ್ಲುವುದಕ್ಕಿಂತ ಭಾಗವಹಿಸುವುದು ಮುಖ್ಯ ಇತ್ಯಾದಿ ತಿಪ್ಪೆ ಸಾರಿಸುವ ಮಾತುಗಳಿಂದ ಅರಿಮೆಗಳು ಉಂಟಾಗುವುದನ್ನು ತಡೆಯಲು ಸಾಧ್ಯವಿಲ್ಲ. ಸೋತವರ ನೋವು ಅವರ ಮನಸ್ಸಿನಲ್ಲಿ ಅದೆಷ್ಟು ಹಿಂಡಿ ಹಿಪ್ಪೆ ಮಾಡುತ್ತದೆ ಎಂದರೆ, ಅವರು ಪ್ರತಿಕಾರಕ್ಕೆ, ಹಟಕ್ಕೆ ಏನಾದರೂ ಮಾಡಬಹುದು. ಮಾಡಲಾಗದ ಕಾರಣಕ್ಕೆ ಆ ಆಕ್ರೋಶವನ್ನು ಅದುಮಿಟ್ಟುಕೊಳ್ಳುತ್ತಾರೆ. ಇಂತಹ ಅದುಮಿಟ್ಟುಕೊಳ್ಳುವ ಎಲ್ಲಾ ಭಾವಗಳೂ ಮನೋರೋಗದ ಮೂಲಗಳೇ.

ಮಕ್ಕಳನ್ನು ಗಮನಿಸಿ, ಸಾಧಾರಣ ಆಟಗಳಲ್ಲಿ, ಆಡುವಾಗ ಸೋಲಬಾರದು, ಸೋತರೆ ಅಳುತ್ತಾರೆ. ಆಟವನ್ನು ಕೆಡಿಸುತ್ತಾರೆ. ಕೂಗಾಡುತ್ತಾರೆ. ಏಕೆ? ಅವರಿಗೆ ತಾವು ಸೋತ ನೋವಿಗಿಂತ ಎದುರಾಳಿಯ ಗೆದ್ದ ದರ್ಪದ ದೌರ್ಜನ್ಯವನ್ನು ಸಹಿಸಲಾಗುವುದಿಲ್ಲ. ಗೆದ್ದವನಿಗೇ ಮಾನ್ಯತೆ. ಇಂತಹ ಅರಿಮೆಯನ್ನು ಬಿತ್ತುವ ವಿಚಾರಗಳಲ್ಲಿ ನಮ್ಮ ಸಮಾಜಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇದುವರೆಗೂ ಯಾವ ಜೀವಿಗಳ ಮನಸ್ಸುಗಳಿಗೂ ನೋವಾಗದ ಹಾಗೆ ನಡೆದುಕೊಳ್ಳುವಂತಹ ವ್ಯವಸ್ಥೆಯನ್ನು ಇನ್ನೂ ಕಂಡುಕೊಂಡಿಲ್ಲ. ಅಂತರವನ್ನು ಹೆಚ್ಚು ಮಾಡುವ, ಅರಿಮೆಯನ್ನು ಗಟ್ಟಿಗೊಳಿಸುವ ಸ್ಪರ್ಧೆಗಳಿಗೆ ಮತ್ತಷ್ಟು ಮಗದಷ್ಟು ಹೊಸಹೊಸ ವ್ಯಾಖ್ಯಾನಗಳು ಸಿಗುತ್ತಿವೆ. ವೈಭವಗೊಳ್ಳುತ್ತಿವೆ.

ಅದೆಷ್ಟೋ ವರ್ಷಗಳಿಂದ ಅದೆಷ್ಟು ಮಾರುಗಳ ಉಗುರುಗಳನ್ನು ಬೆಳೆಸಿಕೊಂಡು ಗಿನ್ನಿಸ್ ರೆಕಾರ್ಡ್ ಮಾಡುವವರು, ತಲೆಯಿಂದ ಅದೆಷ್ಟೋ ನೂರು ತೆಂಗಿನ ಕಾಯಿಗಳನ್ನು ಹೊಡೆದು ಚೂರು ಮಾಡಿ ಲಿಮ್ಕಾ ದಾಖಲೆ ಮಾಡುವವರು, ಇನ್ನೆಂತದ್ದೋ ಯಾರೂ ಮಾಡದೇ ಇರುವುದನ್ನು ತಾನು ಮಾಡಿ ರೆಕಾರ್ಡ್ ಮಾಡುವವರು ಕೀಳರಿಮೆಯ ವ್ಯಕ್ತಿಗಳೇ. ಯಾವುದೇ ದಾಖಲೆ ಮಾಡುವ ಹೆಚ್ಚುಗಾರಿಕೆಯು ಖಂಡಿತ ಆರೋಗ್ಯಕರ ಮನಸ್ಥಿತಿಯ ಲಕ್ಷಣವಂತೂ ಅಲ್ಲ.

ಗಾಯಕಿ ಲತಾ ಮಂಗೇಶ್ಕರ್ ತಮ್ಮ ಪ್ರತಿಭೆಗೆ ಅನುಸಾರವಾಗಿ ಅವಕಾಶಗಳು ಸಿಗುತ್ತಾ ಹಾಡಿಕೊಂಡು ಹೋದರು. ಸಾವಿರಾರು ಹಾಡುಗಳಾಗಿ ದಾಖಲೆಯಾಯಿತೆಂದರೆ ಅದು ಈ ಮಾನಸಿಕ ಸಮಸ್ಯೆಯ ವಿಭಾಗಕ್ಕೆ ಬರುವುದಿಲ್ಲ. ಆದರೆ ದಾಖಲೆಗೊಸ್ಕರವೇ ಹಪಹಪಿಸಿಕೊಂಡು ಮಾಡುವುದರ ಬಗ್ಗೆ ನಮಗೆ ಕಾಳಜಿ ಮತ್ತು ಅದಕ್ಕೆ ಚಿಕಿತ್ಸೆ ಬೇಸಾಮಾನ್ಯವಾಗಿ ಮಕ್ಕಳು ಒಂದಲ್ಲ ಒಂದು ಕೊರತೆಯನ್ನು ಹೊಂದಿರುತ್ತಾರೆ. ಒಂದಲ್ಲ ಒಂದು ವಿಷಯದಲ್ಲಿ ದುರ್ಬಲರಾಗಿರುತ್ತಾರೆ. ಯಾವುದೇ ಮಗುವನ್ನು ನೋಡಿ, ಅವರು ಆಸೆ ಪಡುವುದು, ತಾನು ಬೆಳೆದು ದೊಡ್ಡವರಾದಾಗ ಅದು ಮಾಡುತ್ತೇನೆ, ಇದು ಮಾಡುತ್ತೇನೆ, ಇದನ್ನು ಕಟ್ಟಿಸುತ್ತೇನೆ; ಇತ್ಯಾದಿ. ಯಾವ ಮಕ್ಕಳು ತಾವು ದೊಡ್ಡವರಾದಾಗ ಎಂದು ತಮ್ಮ ಕನಸುಗಳನ್ನು ಹೇಳುತ್ತಿರುತ್ತಾರೋ ಬಹುಪಾಲು ಕೀಳರಿಮೆಗೆ ಕಾರಣವಾಗಿರುವ ಸಂಗತಿಗಳನ್ನು ಅವರು ಎದುರಿಸಿದ್ದಾರೆ ಎಂದರ್ಥ. ಆ ಮಗು, ತಾನಿರುವ ಸ್ಥಿತಿಯನ್ನು ಸಂಪೂರ್ಣವಾಗಿ ಸಂತೋಷವಾಗಿ ಅನುಭವಿಸಲು ಅಲ್ಲಿ ಸರಿಯಾದ ಪ್ರೇರಣೆಗಳು ಮತ್ತು ಅವಕಾಶಗಳು ಸಿಗುತ್ತಿಲ್ಲ ಎಂದರ್ಥ.

ಸಾಮಾನ್ಯವಾಗಿ ಮಕ್ಕಳಲ್ಲೇನು ದೊಡ್ಡವರಲ್ಲಿಯೂ ಕೂಡಾ ನಮಗಿಂತ ಅವರು ಸಂತೋಷವಾಗಿದ್ದಾರೆ, ಸುಖವಾಗಿದ್ದಾರೆ, ಉತ್ತಮ ಜೀವನ ನಡೆಸುತ್ತಿದ್ದಾರೆ ಎಂಬ ಆಲೋಚನೆಗಳಿರುತ್ತವೆ. ಆ ಗಂಡ ಹೆಂಡತಿಯರು ನಮಗಿಂತ ಸುಖವಾಗಿದ್ದಾರೆ, ಅವನ ಅಪ್ಪ ಅಮ್ಮ ನಮ್ಮಪ್ಪ ಅಮ್ಮನಿಗಿಂತ ಹೆಚ್ಚು ಶಾಪಿಂಗ್ ಗೆ ಕರೆದುಕೊಂಡು ಹೋಗುತ್ತಾರೆ. ನಮ್ಮ ಮನೆಗಿಂತ ಅವರ ಮನೆಯಲ್ಲಿ ಹೆಚ್ಚು ಶ್ರೀಮಂತಿಕೆ ಇದೆ. ನನಗಿಂತ ಒಳ್ಳೆಯ ಮೈ ಅವನಿಗಿದೆ. ನನಗಿಂತ ಅವಳು ಚೆನ್ನಾಗಿದ್ದಾಳೆ. ನಿಜ; ಅದು ವಾಸ್ತವವೇ ಇರಬಹುದು. ಆದರೆ ಅದು ಆಯಾ ವ್ಯಕ್ತಿಗಳ ಅರಿಮೆಗೆ ಎಟಕುವ ಆಲೋಚನೆಗಳು. ಅರಿಮೆಗಳಿಲ್ಲದ ಆಲೋಚನೆಗಳು ಬರಿದೇ ಗುರುತಿಸುತ್ತವೆ. ಅದರ ಬಗ್ಗೆ ಆಲೋಚಿಸುವುದಿಲ್ಲ. ಕರುಬುವುದಿಲ್ಲ. ಕೀಳರಿಮೆಯುಳ್ಳವರಿಗೆ ಅಸೂಯೆ ಬಹಳ ಸಹಜವಾದಂತಹ ಗುಣ.

ದಪ್ಪ, ಕೊಯಕಲ, ಉಬ್ಬ, ಕರಿಯ ಇತ್ಯಾದಿಗಳ ರೂಢನಾಮದಲ್ಲಿ ಬೆಳೆಯುವ ಮಕ್ಕಳಿಗೆ ಸಂಕೋಚ ಸಹಜವಾಗುತ್ತದೆ. ತನ್ನ ದೇಹವು ವಿರೂಪವಾಗಿದೆ. ಈ ಕುರೂಪವನ್ನು ಕಂಡು ನಗುವವರಿದ್ದಾರೆ ಎಂಬ ಭಾವ ಅವರನ್ನು ಕುಬ್ಜಗೊಳಿಸುತ್ತದೆ. ಕೀಳರಿಮೆಯನ್ನು ಬುಡಸಮೇತ ಕೀಳು ಸರಿ, ಈ ಕೀಳರಿಮೆಯನ್ನು ಹೋಗಲಾಡಿಸುವ ಬಗೆ ಹೇಗೆ? ಹುಟ್ಟು ಹಾಕದೇ ಇರುವ ಬಗೆಯಾದರೆ, ಅದು ಸುಲಭ. ಈ ರೀತಿಯ ಅನವಶ್ಯಕ, ಅಮಾನವೀಯ ಮತ್ತು ವಿಧ್ವಂಸಕ ದೃಷ್ಟಿಯನ್ನು ಹೊಂದದೇ ಇರುವುದು. ಆ ರೀತಿಯ ಮಾತುಗಳನ್ನು ಆಡದೇ ಇರುವುದು. ಎಲ್ಲರನ್ನೂ ಎಲ್ಲವನ್ನೂ ಸಹಜವಾಗಿ ನೋಡುತ್ತಾ ವ್ಯಕ್ತಿಗೌರವವನ್ನು ಪರಸ್ಪರ ಕೊಟ್ಟುಕೊಳುವುದು.

ಆದರೆ, ಈಗಾಗಲೇ ಇರುವ ಕೀಳರಿಮೆಯನ್ನು ಹೋಗಲಾಡಿಸುವುದು ಹೇಗೆಂದರೆ ಅದು ಕಷ್ಟ. ಈಗಾಗಲೇ ಬೇರುಬಿಟ್ಟಿರುವಂತಹ ಮನೋಭಾವವನ್ನು ಗುರುತಿಸಿಕೊಳ್ಳಬೇಕು. ಅದು ಇದೆ ಎಂಬುದನ್ನು ಒಪ್ಪಿಕೊಳ್ಳಬೇಕು. ನಂತರ ಪ್ರತಿಯೊಂದು ಹೆಜ್ಜೆ ಹೆಜ್ಜೆಗೂ ತನಗೆ ಅರಿಮೆ ಇರುವುದರ ಅರಿವಿನಲ್ಲಿ ತನ್ನನ್ನೇ ತಾನು ಎಚ್ಚರಿಕೆಯಿಂದ ಗಮನಿಸಿಕೊಳ್ಳಬೇಕು. ಎಲ್ಲದಕ್ಕಿಂತ ಮುಖ್ಯವಾಗಿ ತಾನು ತನ್ನ ಹಿರಿಮೆಯನ್ನು ಸಾಬೀತುಗೊಳಿಸಿಕೊಳ್ಳುವ ಕಾರಣವೇನೂ ಇಲ್ಲ, ನನಗೆ ಇರುವಂತಹ ಮೌಲ್ಯ ನನಗಿದೆ ಎಂಬ ಭಾವದಲ್ಲಿ ಆತ್ಮತೃಪ್ತಿಯಿಂದ ತನ್ನನ್ನು ತಾನು ಸಂತೋಷಗೊಳಿಸಿಕೊಳ್ಳಲು ಸಾಧ್ಯತೆಗಳನ್ನು ಕಂಡುಕೊಳ್ಳುವುದು. ಅರಿವೇ ಅರಿಮೆಯನ್ನು ಅಡಗಿಸಲು ಸಾಧ್ಯ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending