ದಿನದ ಸುದ್ದಿ
ದಾವಣಗೆರೆ | ಅಶೋಕ ಟಾಕೀಸ್ ಬಳಿಯ ರೈಲ್ವೇ ಗೇಟ್ ಸಮಸ್ಯೆಗೆ ಪರಿಹಾರ : ಎರಡು ಕಡೆ ಅಂಡರ್ ಬ್ರಿಡ್ಜ್ ನಿರ್ಮಿಸಿ ಕಾಮಗಾರಿ ಆರಂಭ : ರೈಲ್ವೇ ಸಚಿವ ಸುರೇಶ್ ಅಂಗಡಿ
ಸುದ್ದಿದಿನ,ದಾವಣಗೆರೆ : ಅಶೋಕ ಟಾಕೀಸ್ ಬಳಿಯ ರೈಲ್ವೇ ಗೇಟ್‍ಗೆ ಸಂಬಂಧಿಸಿದಂತೆ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೇ ಅಂಡರ್ ಬ್ರಿಡ್ಜ್ ಅಥವಾ ಓವರ್‍ಬ್ರಿಡ್ಜ್ ಸಮಸ್ಯೆಗೆ ಪರಿಹಾರ ದೊರೆತಿದ್ದು, ಶೀಘ್ರದಲ್ಲಿಯೇ ಈ ಸ್ಥಳದಲ್ಲಿ ಎರಡು ಕಡೆ ವೆಂಟ್‍ಗಳ(ಅಂಡರ್‍ಬ್ರಿಡ್ಜ್)ನಿರ್ಮಾಣಕ್ಕೆ ಯೋಜನೆ ಸಿದ್ದಪಡಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಕೇಂದ್ರದ ರಾಜ್ಯ ರೈಲ್ವೇ ಸಚಿವರಾದ ಸುರೇಶ್ ಸಿ.ಅಂಗಡಿ ಹೇಳಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ರೈಲ್ವೇ ಯೋಜನೆಗಳ ಕುರಿತು ಶುಕ್ರವಾರ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಶೋಕ ಟಾಕೀಸ್ ಬಳಿ ಇರುವ ರೇಲ್ವೇ ಗೇಟ್ ಬಳಿ ಸಾರ್ವಜನಿಕರು ಸೇರಿದಂತೆ ಓಡಾಟಕ್ಕೆ ಅನೇಕ ವರ್ಷಗಳಿಂದ ಸಮಸ್ಯೆ ಉಂಟಾಗುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ಹಲವಾರು ಬಾರಿ ಪ್ರಯತ್ನಿಸಿದ್ದು, ಈ ಬಾರಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ.
ಪ್ರಸ್ತುತ ರೇಲ್ವೇ ಗೇಟ್ ಬಳಿ ಒಂದು ಮತ್ತು ಪುಷ್ಪಾಂಜಲಿ ಟಾಕೀಸ್ ಬಳಿ ಲಾರಿಗಳನ್ನು ನಿಲ್ಲಿಸುವ ಜಾಗದಲ್ಲಿ ಒಂದು ಒಟ್ಟು ಎರಡು ರೈಲ್ವೇ ಅಂಡರ್ ಬಿಡ್ಜ್ (ಆರ್‍ಯುಬಿ-ವೆಂಟ್)ಗಳನ್ನು ನಿರ್ಮಿಸಲಾಗುವುದು. ಈ ವೆಂಟ್‍ಗಳಿಂದ ದೊಡ್ಡ ದೊಡ್ಡ ವಾಹನಗಳೂ ಓಡಾಡುವ ರೀತಿಯಲ್ಲಿ ಯೋಜನೆ ಸಿದ್ದಪಡಿಸಿ ನಿರ್ಮಿಸುವ ಮೂಲಕ ಅನೇಕ ವರ್ಷಗಳ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು ಎಂದರು.
ಹಾಗೂ ಪಿ.ಬಿ.ರಸ್ತೆಯಲ್ಲಿರುವ ಎ.ಸಿ ರವರ ಕಚೇರಿಯನ್ನು ಬೇರೆಡೆ ಶಿಫ್ಟ್ ಮಾಡಿ, ಆ ಜಾಗದಲ್ಲಿ ಆರ್‍ಯುಬಿ ನಿರ್ಮಿಸಲಾಗುವುದು. ಜೊತೆಗೆ ಸಣ್ಣ ಪುಟ್ಟ ಮೋಟಾರ್ ಸೈಕಲ್ ಓಡಾಡಲು ಪಾಥ್ ನಿರ್ಮಿಸಲಾಗುವುದು ಎಂದರು.
ರೈಲ್ವೇ ಸಚಿವರ ಪ್ರಮುಖ ಹೇಳಿಕೆಗಳು
- 2022 ರ ವೇಳೆಗೆ ದೇಶಾದ್ಯಂತ ಎಲ್ಲ ರೈಲ್ವೆಗಳನ್ನು ವಿದ್ಯುದೀಕರಣ ಮಾಡಲಾಗುವುದು. ಹಾಗೂ 2022 ರ ಅಂತ್ಯಕ್ಕೆ ರಾಜ್ಯಾದ್ಯಂತ ರೈಲ್ವೇ ಡಬ್ಲಿಂಗ್ ಕಾಮಗಾರಿಗಳನ್ನು ಮುಗಿಸಲು ಸಂಪೂರ್ಣ ಪ್ರಯತ್ನ ಮಾಡಲಾಗುವುದು.
- ಮುಂಬೈ ಕೋಲ್ಕತ್ತಾ ವರೆಗೆ ರಫ್ತು ಮತ್ತು ಆಮದು ಮಾಡಲಿಕ್ಕೋಸ್ಕರ ಒಂದು ಡೆಡಿಕೇಟೆಡ್ ಟ್ರೈನ್ ಬಿಡಲಾಗಿದ್ದು ಇದೇ ರೀತಿಯ ರೈಲನ್ನು ರಾಜ್ಯದ ಅಂಕೋಲ-ಹುಬ್ಬಳಿಯಲ್ಲಿ ಬಿಡಲು ಪ್ರಸ್ತಾವನೆ ಆಗಿದೆ. ಆದರೆ ಈ ರೈಲಿನ ಕುರಿತಾಗಿ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುವ ಕಾರಣ ಈಗ ಬಾಕಿ ಇದೆ. ಇದು ಇತ್ಯರ್ಥವಾದ ಬಳಿಕ ಆದಷ್ಟು ಶೀಘ್ರದಲ್ಲಿ ಕೆಲಸ ಆರಂಭಿಸಲಾಗುವುದು.
- ರಾಜ್ಯದ ಪ್ರಸ್ತಾಪಿತ ರೈಲ್ವೇ ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿ ಗಳು ಮತ್ತು ಎಸ್‍ಎಲ್‍ಓ ಗಳು ಎಷ್ಟು ಬೇಗ ಭೂಸ್ವಾಧೀನ ಪ್ರಕ್ರಿಯೆ ನಡಸಿ ಜಾಗ ನೀಡುತ್ತಾರೋ ಅಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.
ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲ್ವೆ ಲೈನ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ದಾವಣಗೆರೆ ತಾಲ್ಲೂಕಿನ 14 ಗ್ರಾಮಗಳು ಒಳಪಡಲಿದ್ದು ಒಟ್ಟು ವಿಸ್ತೀರ್ಣ 238 ಎಕರೆ ಭೂಸ್ವಾಧೀನ ಮಾಡಬೇಕಿದ್ದು, ಈ ಪೈಕಿ 209 ಎಕರೆ ಭೂಸ್ವಾಧೀನಕ್ಕೆ ಅಂತಿಮ ನೋಟಿಫಿಕೇಷನ್ ಆಗಿದೆ. ಇನ್ನೊಂದು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ವಿಶೇಷ ಭೂಸ್ವಧೀನಾಧಿಕಾರಿ ರೇಷ್ಮಾ ಹಾನಗಲ್ ಹೇಳಿದರು.
ಹುಬ್ಬಳ್ಳಿ-ಚಿಕ್ಕಜಾಜೂರು ರೈಲ್ವೇ ಟ್ರ್ಯಾಕ್ ಡಬ್ಲಿಂಗ್ ಲೈನ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ. ಆದರೆ ಒಂದು ಸ್ಟ್ರೆಚ್‍ಗೆ ಜನರಲ್ ಅವಾರ್ಡ್ ಮಾಡಬೇಕಿದ್ದು ರೂ. 5 ಕೋಟಿ ಠೇವಣಿ ಇರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕಾಗಿ ಎರಡು ಹಂತದಲ್ಲಿ ಒಟ್ಟು 1349.23 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಬೇಕಿದ್ದು ಇದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿಶೇಷ ಭೂಸ್ವಾಧೀನಾಧಿಕಾರಿ ಸರೋಜಾ ಹೇಳಿದಾಗ, ಸಚಿವರು ಇನ್ನು ನಾಲ್ಕು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿಸುವಂತೆ ತಿಳಿಸಿದರು.
ಸಚಿವರು ಮಾತನಾಡಿ, ರೈಲ್ವೇ ಸೇವೆಗೆ ಸಂಬಂಧಿಸಿದಂತೆ ನಮ್ಮ ಆದ್ಯತೆ ಸುರಕ್ಷತೆ, ಸ್ವಚ್ಚತೆ ಮತ್ತು sಸಮಯಪ್ರಜ್ಞೆ ಆಗಿದೆ. ಸಮಯಕ್ಕೆ ಕೂಡ ಹೆಚ್ಚಿನ ಒತ್ತು ನೀಡಲಾಗುವುದು. ರೈಲ್ವೆ ಸಾರ್ವಜನಿಕರ ಆಸ್ತಿಯಾಗಿದ್ದು ಸಾರ್ವಜನಿಕರು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು ಎಂದು ಕರೆ ನೀಡಿದರು.
ಸಂಸದರಾದ ಜಿ.ಎಂ.ಸಿದ್ದೇಶ್ವರ್ ಮಾತನಾಡಿ, ದಾವಣಗೆರೆಯ ಹೊಸ ರೇಲ್ವೇ ಸ್ಟೇಷನ್‍ನ ಪ್ಲಾಟ್‍ಫಾರಂಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಹಾಗೂ ಸ್ಟೇಷನ್‍ನ ಪ್ರವೇಶ ಮತ್ತು ನಿರ್ಗಮನಗಳಲ್ಲಿ ಎರಡು ಕಡೆ ಎಸ್ಕಲೇಟರ್‍ಗಳನ್ನು ಈ ಸಾಲಿನ ಡಿಸೆಂಬರ್ ಅಂತ್ಯದೊಳಗೆ ನಿರ್ಮಿಸಬೇಕು ಎಂದರು.
ಹರಿಹರ ರೈಲ್ವೇ ನಿಲ್ದಾಣದ ಉನ್ನತೀಕರಣ, ಹರಪನಹಳ್ಳಿ ಸ್ಟೇಷನ್‍ನಲ್ಲಿ ರಾತ್ರಿ ಮತ್ತು ಬೆಳಗಿನ ಜಾವ ಸ್ಟ್ರೀಟ್ ಲೈಟ್‍ಗಳ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯ ಆಗಬೇಕು. ಬಾತಿ-ಕರೂರ್ ರೈಲ್ವೇ ಕ್ರಾಸಿಂಗ್ ಬಳಿ ನೀರು ಸಂಗ್ರಹವಾಗುತ್ತಿದೆ. ಈ ಬಗ್ಗೆ ಇಂಜಿನಿಯರ್‍ಗಳು ಕ್ರಮ ಕೈಗೊಳ್ಳಬೇಕೆಂದರು
ಸಂಶೋಧನೆಗೆ ಸೂಚನೆ
ರೈಲ್ವೇ ಸಚಿವರು ಪ್ರತಿಕ್ರಿಯಿಸಿ, ರೈಲ್ವೇ ಅಂಡರ್ ಬ್ರಿಡ್ಜ್‍ಗಳಲ್ಲಿ ನೀರು ನಿಲ್ಲುವ ಸಮಸ್ಯೆ ಸಾಮಾನ್ಯವಾಗಿದ್ದು, ಈ ಸಮಸ್ಯೆ ಬಗೆಹರಿಸಲು ರೈಲ್ವೇ ಇಂಜಿನಿಯರ್‍ಗಳು ಸಂಶೋಧನೆ ನಡೆಸಬೇಕು. ಪಂಪ್ ಇಟ್ಟು ನೀರು ತೆಗೆಯುವುದು ಮುಖ್ಯವಲ್ಲ, ಬದಲಾಗಿ ಶಾಶ್ವತ ಪರಿಹಾರಕ್ಕಾಗಿ ಸಂಶೋಧನೆ ಕೈಗೊಳ್ಳುವಂತೆ ಅವರಿಗೆ ಸೂಚನೆ ನೀಡಿದರು.
ಸಂಸದರು, ವಾಸ್ಕೋ-ಯಶವಂತಪುರದ ಟ್ರೈನುಗಳು ಚಿಕ್ಕಜಾಜೂರಿನಲ್ಲಿ ನಿಲುಗಡೆ ಮಾಡಬೇಕು. ಎಲ್‍ಸಿ 174 ಆನಗೋಡು ಇಲ್ಲಿ ಫ್ಲೈಓವರ್ ಆಗಬೇಕು. ಮಂಡ್ಯ-ಹಡಗಲಿ ಹೈವೇ ಆಗಬೇಕು, ಜೊತೆಗೆ ಮಾಯಕೊಂಡದಲ್ಲಿ ಫ್ಲೈ ಓವರ್ ನಿರ್ಮಿಸಬೇಕು. ಭರಮಸಾಗರ-ಜಗಳೂರು ಏತ ನೀರಾವರಿ ಕಾಮಗಾರಿಗೆ ರೈಲ್ವೇಯವರು ಅನುಮತಿ ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಸಕರಾದ ಎಸ್.ಎ ರವೀಂದ್ರನಾಥ್, ಪ್ರೊ. ಲಿಂಗಣ್ಣ, ಎಸ್.ವಿ ರಾಮಚಂದ್ರಪ್ಪ, ಜಿಪಂ ಅಧ್ಯಕ್ಷೆ ದೀಪಾ ಜಗದೀಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ರೈಲ್ವೇ ಜಿಎಂ ಎ.ಕೆ ಸಿಂಗ್, ಮೈಸೂರ್ ರೈಲ್ವೇ ಡಿಆರ್‍ಎಂ ಅಪರ್ಣ ಗರಗ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಎಸಿ ಮಮತಾ ಹೊಸಗೌಡರ್, ದೂಡಾ ಆಯುಕ್ತ ಬಿ.ಟಿ ಕುಮಾರಸ್ವಾಮಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


