Connect with us

ಅಂತರಂಗ

ಮಾನವನ ಮನೋ ಲೈಂಗಿಕ ಬೆಳವಣಿಗೆಯ ತಿಳುವಳಿಕೆ – ಇಂದಿನ ಅಗತ್ಯತೆ

Published

on

  • ಕ್ರಾಂತಿರಾಜ್ ಒಡೆಯರ್ ಎಂ,ಸಹಾಯಕ ಪ್ರಾದ್ಯಾಪಕರು, ಸೇಪಿಯೆಂಟ್ ಕಾಲೇಜು,ಮೈಸೂರು

ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ನನ್ನ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕಿನಲ್ಲಿ ಒಂದು ದಿನ ಕಾಲೇಜಿಗೆ ಹೋಗುವಾಗ, ದಾರಿಯಲ್ಲಿ ಹೋಗುತಿದ್ದ ಒಂದು ಸುಂದರ ಹುಡುಗಿಯನ್ನು ಕಂಡು, ಅವಳು ನನ್ನನ್ನು ನೋಡಲೆಂದು ಬೈಕನ್ನು ವೇಗವಾಗಿ ಚಲಿಸಲು ಹೋಗಿ, ಹೋಗುತ್ತಿದ್ದ ರಸ್ತೆಯ ತಿರುವಿನಲ್ಲಿ ಆಯತಪ್ಪಿ ಬೈಕಿನಿಂದ ನಾ ಕೆಳಗೆ ಬೀಳಲು, ಅದೇ ಸಮಯಕ್ಕೆ ಆ ಹುಡುಗಿ ನನ್ನನ್ನು ನೋಡಲು, ಅಂದು ನನಗಾದ ಮುಜುಗರ ಹೇಳತೀರದು.

ಅಂದೇ ಕೊನೆ. ಬೇರೆಯವರ ಮೆಚ್ಚಿಸಲು ವಾಹನವನ್ನು ವೇಗವಾಗಿ ಓಡಿಸುವುದನ್ನು ಬಿಟ್ಟೆ. ಅಷ್ಟೇ ಅಲ್ಲ, ಅಂದಿನಿಂದ ನಾನು ರಸ್ತೆಯಲ್ಲಿ ಯಾರು ಇಲ್ಲದಿದ್ದರೂ ಕೂಡ, ವಾಹನವನ್ನು ಅತಿವೇಗದಲ್ಲಿ ಓಡಿಸುವುದಿಲ್ಲ. ಈಗ ಯಾರಾದ್ರೂ ಹುಡುಗ್ರು ಅಥವಾ ಹುಡ್ಗಿರು ರಸ್ತೆಯಲ್ಲಿ ವೇಗವಾಗಿ ವಾಹನಗಳನ್ನ ಓಡಿಸೋದನ್ನ ನೋಡಿ, ಜನರು ಅವರಿಗೆ ಬೈದರೆ, ಅದನ್ನ ನೋಡಿ, ನನಗಾಗಿದ್ದ ಘಟನೆಯ ನೆನಪಿಸಿಕೊಂಡು ನಗ್ತಾ ಇರ್ತೀನಿ.

ನಾನು ತರಗತಿಯಲ್ಲಿ ಪಾಠ ಮಾಡಬೇಕಾದ್ರೆ, ಹಲವು ಸಾರಿ ರಸ್ತೆಯಲ್ಲಿ ಹೋಗುವ ಬೈಕುಗಳಿಂದ ಬರುವ ಜೋರು ಕರ್ಕಶ ಶಬ್ದದಿಂದ ಪಾಠ ಕೇಳುತ್ತಿರುವ ನನ್ನ ವಿದ್ಯಾರ್ಥಿಗಳು ಅದನ್ನ ಕೇಳಿ ಅವರ ಮುಖದ ಮೂಲಕ ಅಸಯ್ಯ ಭಾವನೆಯನ್ನು ವ್ಯಕ್ತಪಡಿಸುವುದಲ್ಲದೇ, ಪಾಠ ಮಾಡುವ ನನಗೆ ಕಿರಿಕಿರಿ ಉಂಟಾಗುತ್ತದೆ. ಆದರೂ ಅದರ ಬಗ್ಗೆ ಕುಪಿತಗೊಳ್ಳದೇ, ಆ ಕರ್ಕಶ ಶಬ್ದ ಹಾಗು ಅದನ್ನು ಮಾಡಿದವರ ಕುರಿತು ಒಂದು ಜೋಕ್ ಮಾಡಿ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡುತ್ತೇನೆ.

ಈ ಒಂದು ನೆಡವಳಿಕೆಯ ಯುವಕರ ಬಗ್ಗೆ ಅಧ್ಯಯನ ಮಾಡಲು ಹೋದ ನನಗೆ ತಿಳಿದದ್ದು ಬಹಳಷ್ಟು. ಯುವ ವಯಸ್ಸಿನಲ್ಲಿ ಇವರು ಬೀದಿಯಲ್ಲಿ ಹೋಗುವ ಸುಂದರ ಹುಡುಗಿಯರನ್ನು ಮೆಚ್ಚಿಸಲು, ತಮ್ಮ ತಮ್ಮ ವಾಹನಗಳನ್ನು ವೇಗವಾಗಿ ಓಡಿಸುವುದೂ ಅಲ್ಲದೇ, ಆ ವಾಹನದ ಇಂಜಿನೆಗಳಿಂದ ಕರ್ಕಶ ಶಬ್ದ ಮಾಡಿಸುತ್ತಾರೆಂಬ ಅಭಿಪ್ರಾಯ ಹೊಂದಿದ್ದ ನನ್ನನ್ನು ಅವರು ಸುಳ್ಳು ಮಾಡಿಸಿದರು.

ಇವರು, ರಸ್ತೆಯಲ್ಲಿ ಯಾವ ಹುಡುಗಿಯರು ಇಲ್ಲದ್ದಿದ್ದರೂ ಕೂಡ ಕರ್ಕಶ ಶಬ್ದ ಹೊರಹಾಕುವ ತಮ್ಮ ವಾಹನಗಳನ್ನ ಅತಿ ವೇಗವಾಗಿ ಓಡಿಸಿ, ಸುತ್ತಮುತ್ತಲ ಜನರಿಗೆ ಅಶಾಂತಿ ಉಂಟುಮಾಡಿ, ಅದರಿಂದ ತಾವು ಖುಷಿ ಪಡುವ ಸ್ವಭಾವದವರು. ಇವರ ಚಟುವಟಿಕೆ ಇಷ್ಟಕ್ಕೆ ಕೊನೆಗೊಳ್ಳದೇ, ಬೀದಿಯಲ್ಲಿ ಹೋಗುವ ಹುಡುಗಿಯರನ್ನೆಲ್ಲ ಛೇಡಿಸುವುದು, ರೌಡಿಸಂ ಗುಂಪನ್ನು ಸೇರಿ ಗಲಾಟೆಗಳನ್ನು ಮಾಡುವುದು, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಹೊಂದಿರುವುದು ಹಾಗೂ ಮಾದಕ ವಸ್ತುಗಳ ಸೇವನೆ ಮಾಡುವುದು ಇವರ ಇತರೆ ಕಾರ್ಯಚಟುವಟಿಕೆಗಳು. ವಾಹನಗಳನ್ನು ಕರ್ಕಶ ಶಬ್ದ ಮಾಡಿಕೊಂಡು ಅತಿ ವೇಗವಾಗಿ ಓಡಿಸುವವರೆಲ್ಲ ಹೀಗೆ ಎಂದು ಹೇಳಲಾರೆ. ಆದರೆ, ಹಲವರು ಇಂತಹವರೇ. ಇಂದಿನ ಪೀಳಿಗೆಯಲ್ಲತೂ ಇಂತಹವರ ಸಂಖ್ಯೆ ಹೆಚ್ಚು.

ಈವತ್ತಿನ ಯುವಕರು ಅಂತಹ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳುವುದಕ್ಕೆ ಕಾರಣಗಳನ್ನು ತಿಳಿದುಕೊಳ್ಳಲು ಹೊರಟರೆ, ನನಗೆ ಮನೋವಿಜ್ಞಾನದ ಪಿತಾಮಹ ಸಿಗ್ಮನ್ದ್ ಫ್ರಾಯ್ಡ್ ತುಂಬ ಪ್ರಸ್ತುತ ಎನಿಸುತ್ತಾರೆ. ಅವರ ಮನೋ ಲೈಂಗಿಕ ಬೆಳವಣಿಗೆ ಸಿದ್ಧಾಂತದಲ್ಲಿ, ಮನುಷ್ಯರಲ್ಲಿನ ಇಂತಹ ನೆಡವಳಿಕೆಗೆ ಕಾರಣಗಳು, ಪರಿಣಾಮಗಳು ಹಾಗೂ ಅದನ್ನು ಸರಿಪಡುವ ಕ್ರಿಯೆಯನ್ನು ಕುರಿತು ವಿಸ್ತಾರವಾಗಿ ತಿಳಿಸಿದ್ದಾರೆ.

ಇವರ ಪ್ರಕಾರ, ಮನುಷ್ಯನ ಮೊದಲ ಹಂತದ ಬೆಳವಣಿಗೆ (ಹುಟ್ಟಿದಾಗಿನಿಂದ 2 ವರ್ಷದ ಹಂತ) ಯನ್ನು ಓರಲ್ ಹಂತ (ORAL STAGE) ಎಂದು ಕರೆದು, ಅದರಲ್ಲಿ ಒಂದು ಮಗುವಿಗೆ ಸಹಜವಾಗಿ ಸಿಗಬೇಕಾದ ವಾತಾವರಣದ ಬಗ್ಗೆ ಹೇಳಿದ್ದಾರೆ.

ಅವುಗಳೆಂದರೆ

  • ಈ ಹಂತದಲ್ಲಿ ಮನುಷ್ಯನು ಅತಿ ಹೆಚ್ಚು ಬಳಸುವ ಲೈಂಗಿಕ ಅಂಗ ಬಾಯಿ.
  • ಮಾತು ಬಾರದ ಮಗುವು ತನ್ನ ಎಲ್ಲ ಕ್ರಿಯೆಗೂ ಬಾಯಿಯನ್ನು ಬಳಸುತ್ತದೆ. ಉದಾಹರಣೆಗೆ: ಅಳಲು, ನಗಲು, ಕೈ ಹಾಗು ಕಾಲಿನ ಬೆರಳುಗಳನ್ನು ಬಾಯಿಗೆ ಹಾಕಿಕೊಳ್ಳುವುದು, ಹೊಟ್ಟೆ ಹಸಿದಾಗ ಜೋರಾಗಿ ಅಳುವುದು ಅಥವಾ ಕಿರುಚುವುದು.
  • ತಾಯಿಯು ಮಗುವಿಗೆ ಎದೆಯ ಹಾಲು ಉಣಿಸುವುದು, ಅದನ್ನು ಮಗುವು ತನ್ನ ಬಾಯಿಯಿಂದ ಕಚ್ಚಿ ಹಾಲನ್ನು ಹೀರುವುದು ಬಹಳ ಮುಖ್ಯ ಕ್ರಿಯೆ.
  • ಈ ಅಂತದಲ್ಲಿ ಮಗುವನ್ನು ತಾಯಿ ಅಥವಾ ಯಾರಾದರೂ ಎತ್ತಿಕೊಂಡಾಗ, ತಮ್ಮ ದೇಹಕ್ಕೆ ಬಿಗಿದಪ್ಪಿಕೊಳ್ಳೋದು, ಇದರಿಂದ ಮಗುವಿಗೆ ತಾನು ಸಮಾಜದ ಒಂದು ಭಾಗ. ನನಗೂ ಜನರಿದ್ದಾರೆ ಎಂಬುದನ್ನು ಆ ಸಮಯದಲ್ಲಿ ಅನುಭಾವಿಸುತ್ತದೆ.

ಆದರೆ ಇಂತಹ ಸೌಲಭ್ಯ ಹಾಗೂ ವಾತಾವರಣ ಕೆಳಗಿನ ಕಾರಣಗಳಿಂದ ಎಲ್ಲ ಮಕ್ಕಳಿಗೂ ಸಿಗುವುದಿಲ್ಲ. ಕಾರಣ..

  1. ಹುಟ್ಟಿದ ಕೆಲವೇ ದಿನಗಳಲ್ಲಿ ಮಗುವಿನ ತಾಯಿಯು ಮರಣಹೊಂದಿದ್ದಲ್ಲಿ.
  2. ಹುಟ್ಟಿದ ಮಗುವು ಬೇಡವೆಂದು ಅನಿಸಿ ಎಲ್ಲೋ ಬಿಟ್ಟ ಮಗುವು ಅನಾಥಾಶ್ರಮದಲ್ಲಿ ಬೆಳೆಯುವ ಸಂದರ್ಭ ಬಂದಾಗ.
  3. ಇಂದಿನ ಮಾಡ್ರನ್ ಜೀವನಶೈಲಿಯ ತಾಯಂದಿರು ಹಾಗೂ ಇತರೆ ಜನರು, ಆ ವಯಸ್ಸಿನ ಮಕ್ಕಳನ್ನು ಎತ್ತಿಕೊಂಡು, ದೇಹದ ಸಮೀಪಕ್ಕೆ ಅಪ್ಪಿಕೊಂಡರೆ ಎಲ್ಲಿ ಗಲೀಜು ಆಗಬಿಡಬಹುದೆಂದು ನಿರ್ಧರಿಸಿ ಅದಕ್ಕೆ ಪರ್ಯಾಯವನ್ನು ಹುಡುಕಿಕೊಂಡಾಗ.
  4. ಕೆಲಸಕ್ಕೆ ಹೋಗುವ ಮಹಿಳೆಯರು, ತಮ್ಮ ಕೆಲಸದ ಒತ್ತಡದಲ್ಲಿ ಹುಟ್ಟಿದ ಮಗುವಿನ ಬಗ್ಗೆ ಗಮನ ಕೊಡದೆ ಇದ್ದಾಗ.

ಈ ಮೇಲೆ ತಿಳಿಸಿರುವ ವಾತಾವರಣದಲ್ಲಿ ಬೆಳೆದ ಮಕ್ಕಳು ತನ್ನ ಯುವ ವಯಸ್ಸಿನಲ್ಲಿ ಕೆಳಕಂಡ ನಡವಳಿಕೆಗಳನ್ನು ಹೊಂದಬಹುದು ಎಂದು ಸಿಗ್ಮನ್ದ್ ಫ್ರಾಯ್ಡ್ ಅವರು ತಿಳಿಸುತ್ತಾರೆ.

01. ಆ ವಯಸ್ಸಿನಲ್ಲಿ ಮಗುವು ಸಹಜವಾಗಿ ಬಳಸಬೇಕಾದ ತನ್ನ ಲೈಂಗಿಕ ಅಂಗ ಬಾಯಿಯಿಂದ ತಾಯಿಯ ಎದೆಯ ಹಾಲನ್ನು ಕಚ್ಚಿ ಕುಡಿಯದೆ ಹೋದರೆ, ದೊಡ್ಡವರಾದ ಮೇಲೆ, ಅದೇ ಬಾಯಿಯನ್ನು ಯೆಥೇಚ್ಛವಾಗಿ ಬಳಸುವ ಕ್ರಿಯೆಯಲ್ಲಿ ತೊಡಗುವುದು.

ಉದಾಹರಣೆ: ವಿನಾ ಕಾರಣ ಜಗಳವಾಡುವುದು, ಜೋರಾಗಿ ಮಾತನಾಡುವುದು, ಕಿರುಚುವುದು, ಕಚ್ಚುವುದು, ಅತಿಯಾದ ದೂಮಪಾನ ಮಾಡುವುದು ಹಾಗೂ ಬಾಯನ್ನು ಬಳಸಿ ಮಾಡುವ ಕ್ರಿಯೆಯಲ್ಲಿ ಹೆಚ್ಚು ಆಸಕ್ತಿ ಹೊಂದುವುದು.

02. ತಂದೆ ತಾಯಿ, ಕುಟುಂಬಸ್ಥರ ಹಾಗೂ ಸಮಾಜದ ಅಪ್ಪುಗೆಯಲ್ಲಿ ಬೆಳೆಯದ ಮಗು, ದೊಡ್ಡವರಾದ ಮೇಲೆ, ತಾನು ಸಮಾಜಕ್ಕೆ ಸೇರಿಲ್ಲವೆಂಬ ಭಾವನೆಯಿಂದ, ಜನರ ಸಂಪರ್ಕ ಕಡಿದುಕೊಂಡು, ಯಾವಾಗಲೂ ಏಕಾಂತದಲ್ಲಿ ಇರುವುದು, ಜನರನ್ನು ಸರಿಯಾಗಿ ಮಾತನಾಡಿಸದೆ ಇರುವುದು, ಯಾವಾಗಲೂ ಕೆಟ್ಟ ವಿಚಾರವನ್ನೇ ಯೋಚಿಸುವುದು, ಸಮಾಜಕ್ಕೆ ಕೇಡು ಮಾಡುವುದರಲ್ಲಿ ಆನಂದ ಪಡುವುದು ಹಾಗೂ ಇತರೆ ಸಾಮಾಜಿಕ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು.

03. ಇಂತಹ ಮಕ್ಕಳು ದೊಡ್ಡವರಾದಮೇಲೆ, ಅವರಂತೆಯೇ ಇರುವ ಇತರ ವ್ಯಕ್ತಿಗಳ ಗುಂಪು ಸೇರಿ, ಸಮಾಜ ವಿರೋಧಿ ಆಲೋಚನೆಗಳನ್ನು ಬೆಳೆಸಿಕೊಳ್ಳುವುದಲ್ಲದೇ, ಅಂತಹ ಚಟುವಟಿಕೆಗಳಲ್ಲಿ ತೊಡಗುವುದು.

ಬಹಳ ಆತಂಕಕಾರಿ ವಿಷಯ ಎಂದರೆ, ಇಂದಿನ ಸಮಾಜದಲ್ಲಿ ಈ ತರಹದ ನೆಡವಳಿಕೆಯ ಯುವಕರ ಸಂಖ್ಯೆ ಬಹಳ ಹೆಚ್ಚುತ್ತಿದೆ. ಈ ಬೆಳವಣಿಗೆ ಆರೋಗ್ಯಕರ ಸಮಾಜಕ್ಕೆ ಮಾರಕವೆಂಬುದು ನನ್ನ ಅನಿಸಿಕೆ.

ಆದ್ದರಿಂದ, ಮಾನವನ ಮನೋ ಲೈಂಗಿಕ ಬೆಳವಣಿಗೆಯ ಬಗ್ಗೆ ಕಾಳಜಿ ವಹಿಸಿ, ಮನೋವಿಜ್ಞಾನದ ಸತ್ಯವನ್ನು ತಿಳಿದುಕೊಂಡು, ಬೆಳೆಯುವ ಮಕ್ಕಳಿಗೆ ಉತ್ತಮ ವಾತಾವರಣ ಸೃಷ್ಟಿಸಿ, ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯನ್ನು ನೀಡಿದರೆ, ಆರೋಗ್ಯಕರ ಸಮಾಜ ನಿರ್ಮಿಸಿ, ಮುಂದೆ ಬರುವ ಪೀಳಿಗೆಗಳಿಗೆ ಒಳ್ಳೆಯ ದಾರಿಯನ್ನು ನಿರ್ಮಿಸಿದಂತಾಗುತ್ತದೆ. ಅದು ಆದಷ್ಟು ಬೇಗ ಆಗಲಿ ಎಂಬುದು ನನ್ನ ಅಭಿಲಾಷೆ.

(ಖ್ಯಾತ ಮನೋಶಾಸ್ತ್ರಜ್ಞ ಸಿಗ್ಮನ್ಡ್ ಫ್ರಾಯ್ಡ್ ಅವರಿಂದ ಪ್ರೇರಿತನಾಗಿ ಬರೆದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending