Connect with us

ಬಹಿರಂಗ

ಡಾ.ಅಂಬೇಡ್ಕರ್‌ರವರ ಬರಹಗಳ ವಿರುದ್ಧ ವ್ಯವಸ್ಥಿತ ಅಸ್ಪೃಶ್ಯತಾಚರಣೆ..?

Published

on

  • ರಘೋತ್ತಮ ಹೊ.ಬ

ಭಾರತದ ಯಾವುದೇ ಪುಸ್ತಕದ ಅಂಗಡಿಗಳಲ್ಲಿ ಡಾ.ಅಂಬೇಡ್ಕರ್‌ರವರು ಬರೆದಿರುವ ಪುಸ್ತಕಗಳು ದೊರೆಯುವುದಿಲ್ಲ. ಹೌದು, ಇದು ಕಟು ಸತ್ಯ. ನಾವು ಅಥವಾ ಅಂಬೇಡ್ಕರರ ಬಗ್ಗೆ ಓದಲು ಆಸಕ್ತಿ ಇರುವ ಯಾರೇ ಆದರೂ ಡಾ.ಅಂಬೇಡ್ಕರ್ ರವರು ಬರೆದಿರುವ ಪುಸ್ತಕಗಳನ್ನು ಖರೀದಿಸಲು ಭಾರತದ ಯಾವುದೇ ಪುಸ್ತಕದ ಮಳಿಗೆಗೆ ಹೋದರು ಪುಸ್ತಕಗಳು ಅವರಿಗೆ ದೊರೆಯುವುದೇ ಇಲ್ಲ! ತಮಾಷೆಗೆ ಹೇಳುತ್ತಿಲ್ಲ.

ಮೊನ್ನೆ ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿರುವ ಬೆಂಗಳೂರಿನ ಉದಯೋನ್ಮುಖ ನರರೋಗತಜ್ಞರಾದ ಡಾ.ಲಿಂಗರಾಜುರವರು ಫೇಸ್‌ಬುಕ್‌ನಲ್ಲಿ ಲೈವ್‌ನಲ್ಲಿ ಅಂತರರಾಷ್ಟ್ರೀಯ ವೇದಿಕೆಯೊಂದರ ಆಹ್ವಾನದ ಮೇರೆಗೆ ಡಾ.ಅಂಬೇಡ್ಕರರ Annihilation of caste (ಜಾತಿ ವಿನಾಶ) ಕೃತಿ ಬಗ್ಗೆ ಮಾತನಾಡಲು ಒಪ್ಪಿಕೊಂಡು ಪುಸ್ತಕ ಹುಡುಕಲು ಬೆಂಗಳೂರಿನ ಪುಸ್ತಕ ಮಳಿಗೆಯೊಂದಕ್ಕೆ ಹೊರಟಿದ್ದಾರೆ.

ಆದರೆ ಅವರಿಗೆ ಡಾ.ಅಂಬೇಡ್ಕರರು ಬರೆದಿರುವ ಒಂದು ಪುಸ್ತಕ ಕೂಡ ಸಿಕ್ಕಿಲ್ಲ. ಏಷ್ಯಾದ ಬೃಹತ್ ಪುಸ್ತಕ ಮಾರಾಟ ಮಳಿಗೆ ಎಂದು ಬೋರ್ಡ್ ಹಾಕಿಕೊಂಡಿರುವ, ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹಲವಾರು ಬ್ರ‍್ಯಾಂಚ್‌ಗಳನ್ನು ಹೊಂದಿರುವ ಆ ಪುಸ್ತಕ ಮಳಿಗೆಯಲ್ಲಿ ಟಾಲ್ ಸ್ಟಾಯ್, ಕಾರ್ಲ್ ಮಾರ್ಕ್ಸ್ ಹೀಗೆ ವಿದೇಶಿ ಚಿಂತಕರ ಕೃತಿಗಳು ಸಿಗುತ್ತವೆ. ಆದರೆ ಸ್ವದೇಶಿ ಡಾ.ಅಂಬೇಡ್ಕರರ ಪುಸ್ತಕಗಳು ಸಿಗುವುದಿಲ್ಲ. ಇದು ಆ ಮಳಿಗೆಯೊಂದರ ಕತೆಯಲ್ಲ, ಭಾರತದ ಎಲ್ಲಾ ನಗರಗಳ ಪುಸ್ತಕ ಮಳಿಗೆಗಳ ಕತೆಯಿದು.

ಈ ಬಗ್ಗೆ ಮಾತನಾಡಿರುವ ಡಾ.ಲಿಂಗರಾಜುರವರು “ಅಂಬೇಡ್ಕರರ ಆ ಕೃತಿ ಕಾನೂನುಬಾಹಿರವೇ? ಇಲ್ಲ. ಏಕೆಂದರೆ ಅದನ್ನು ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯವೇ ಪಠ್ಯಪುಸ್ತಕವಾಗಿ ಮಾನ್ಯತೆ ನೀಡಿದೆ. ಆದರೆ ವಾಸ್ತವ ಏನೆಂದರೆ ಕೆಲವು ದುಷ್ಟ ಶಕ್ತಿಗಳು ಅಂಬೇಡ್ಕರರ ಕೃತಿಗಳು ಯಾರಿಗೂ ಸಿಗದಂತೆ, ಜನರನ್ನು ತಲುಪುದಂತೆ ತಡೆದಿವೆ” ಎನ್ನುತ್ತಾರೆ. ಕೊನೆಯಲ್ಲಿ ಅಮೆಜಾನ್ ಮೂಲಕ ತಾನು ಪುಸ್ತಕ ತರಿಸಿಕೊಂಡಿದ್ದಾಗಿ ಡಾ.ಲಿಂಗರಾಜು ಹೇಳಿಕೊಂಡಿದ್ದಾರೆ.

ಹಾಗಿದ್ದರೆ ಅಂಬೇಡ್ಕರರ ಕೃತಿಗಳಿಗೆ ಬೇಡಿಕೆ ಕಡಿಮೆಯೇ? ಆ ಕಾರಣಕ್ಕೆ ಮಳಿಗೆಗಳು ತರಿಸುತ್ತಿಲ್ಲವೆ ಎಂದರೆ ಖಂಡಿತ ಇಲ್ಲ. ವಾಸ್ತವ ಏನೆಂದರೆ ಡಾ.ಅಂಬೇಡ್ಕರರು ಬರೆದಿರುವ ಕೃತಿಗಳಿಗೆ ಭಾರೀ ಬೇಡಿಕೆ ಇದೆ. ಸಾಹಿತ್ಯ ಸಮ್ಮೇಳನಗಳಲ್ಲಿ ಅತಿ ಹೆಚ್ಚು ಮಾರಾಟ ಆಗುವುದು ಡಾ.ಅಂಬೇಡ್ಕರ್ ಸಂಬಂಧಿಸಿದ ವೈಚಾರಿಕ ಕೃತಿಗಳೇ! ಡಾ.ಅಂಬೇಡ್ಕರರ ಹೆಸರಿನ ಕಾರಣಕ್ಕೆ ಆ ಕೃತಿಗಳಿಗೆ ಬೇಡಿಕೆಯೇ? ಖಂಡಿತ ಇಲ್ಲ. ಅಂಬೇಡ್ಕರರ ಕೃತಿಗಳಿಗೆ ಈ ಮಟ್ಟಿಗಿನ ಬೇಡಿಕೆಗೆ ಕಾರಣ ಆ ಕೃತಿಗಳ ವಸ್ತು, ವಿಚಾರಗಳನ್ನು ಉತ್ಕೃಷ್ಟ ಇಂಗ್ಲಿಷ್ ಭಾಷೆಯಲ್ಲಿ ಮಂಡಿಸಿರುವ ಶೈಲಿ, ಓದುಗನನ್ನು ಹಿಡಿದಿಡುವ ಧಾಟಿ.

ಕುತೂಹಲಕರ ವಿಚಾರವೆಂದರೆ ಅಂಬೇಡ್ಕರರ ಒಂದು ಪುಟ್ಟ ಕೃತಿ ಒಂದು ಬೃಹತ್ ಚಳುವಳಿಯನ್ನೇ ಒಂದು ಬೃಹತ್ ರಾಜಕೀಯ ಪಕ್ಷವನ್ನೇ ಹುಟ್ಟು ಹಾಕಿದೆ ಎಂದರೆ…!1970ರ ಸಂದರ್ಭದಲ್ಲಿ ದಿವಂಗತ ಕಾನ್ಷೀರಾಮ್‌ರವರಿಗೆ ಡಾ.ಅಂಬೇಡ್ಕರ್ ರವರ ಈ “ಅನ್ನಿಹಿಲೇಷನ್ ಆಫ್ ಕ್ಯಾಸ್ಟ್” ಕೃತಿ ಸಿಕ್ಕಿ ಇಡೀ ರಾತ್ರಿ ಅವರು ಅದನ್ನು ಓದಿ ಜ್ಞಾನೋದಯಗೊಂಡು ಬಹುಜನ ಸಮಾಜ ಪಕ್ಷದ ಉದಯಕ್ಕೆ ಕಾರಣರಾಗುತ್ತಾರೆ! ಆ ಮಟ್ಟಿಗಿನ ಭವ್ಯ ವಸ್ತು, ಸ್ಪೂರ್ತಿ ಚಿಲುಮೆ ಇರುವ ಕೃತಿಗಳು ಡಾ.ಅಂಬೇಡ್ಕರರದು.

ಈ ನಿಟ್ಟಿನಲ್ಲಿ ಅವರ “ಅನ್ನಿಹಿಲೇಷನ್ ಆಫ್ ಕ್ಯಾಸ್ಟ್” ಜೊತೆಗೆ “ರೆವಲ್ಯೂಷನ್ ಅಂಡ್ ಕೌಂಟರ್ ರೆವಲ್ಯೂಷನ್”, ರಿಡಲ್ಸ್ ಇನ್ ಹಿಂದೂಯಿಸಂ”, “ವೂ ವರ್ ಶೂದ್ರಾಸ್”, “ದಿ ಅಂಟಚಬಲ್ಸ್”, “ಪ್ರಾಬ್ಲಂ ಆಫ್ ರುಪೀ“, “ಪಾಕಿಸ್ತಾನ್ ಆರ್ ಪಾರ್ಟಿಷನ್ ಆಫ್ ಇಂಡಿಯಾ “, “ಬುದ್ಧ ಅಂಡ್ ಹಿಸ್ ಧಮ್ಮ” ಹೀಗೆ ಡಾ.ಅಂಬೇಡ್ಕರರ ಇತರೆ ಕೃತಿಗಳು ಅವುಗಳ ವಸ್ತುಗಳ ಜೊತೆಗೆ ಪ್ರಾಚೀನ ಭಾರತದ ಇತಿಹಾಸ, ಭಾರತದ ಸ್ವಾತಂತ್ರ‍್ಯ ಸಂದರ್ಭದ ಘಟನೆಗಳು, ಈ ದೇಶದ ಸಾಮಾಜಿಕ ಕಟುಸತ್ಯಗಳನ್ನು ಐತಿಹಾಸಿಕ ದಾಖಲೆಗಳೊಡನೆ ಮನಮುಟ್ಟುತ್ತವೆಯೆಂದರೆ, ಕಣ್ಣಿಗೆ ಕಟ್ಟುವಂತೆ ಚಿತ್ರಿಸುತ್ತವೆಯೆಂದರೆ…, ಅದರಲ್ಲೂ ಅವರ “ಪ್ರಾಬ್ಲಂ ಆಫ್ ರುಪೀ” ಪುಸ್ತಕ ಈ ದೇಶದ ಹಣಕಾಸು ವ್ಯವಸ್ಥೆ ನಿಯಂತ್ರಣ ಮಾಡುವ ಉತ್ಕೃಷ್ಟ ಬ್ಯಾಂಕ್ ಆದ “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ” ಸ್ಥಾಪನೆಗೆ ಕಾರಣವಾದರೆ “ಪಾಕಿಸ್ತಾನ್ ಆರ್ ಪಾರ್ಟಿಷನ್ ಆಫ್ ಇಂಡಿಯಾ” ಕೃತಿ ದೇಶ ವಿಭಜನೆಯ ಕಾರ್ಯವನ್ನು ಸುಲಲಿತವಾಗಿ ನಡೆಯಲಿಕ್ಕೆ ನೆರವಾಯಿತು.

ದುರಂತವೆಂದರೆ ಇಂತೆಲ್ಲ ಮಹತ್ವದ ಜ್ಞಾನ ಮತ್ತು ಐತಿಹಾಸಿಕ ಬೆಳವಣಿಗೆ ಮಯ ಹಿನ್ನೆಲೆಯನ್ನು ಈ ದೇಶದ ಪಟ್ಟಭದ್ರ ಹಿತಾಸಕ್ತಿಗಳು ಜನಸಾಮಾನ್ಯರಿಗೆ ತಲುಪಲು ಬಿಟ್ಟಿಲ್ಲ. ಮತ್ತೊಂದು ವಾಸ್ತವವೆಂದರೆ ಭಾರತದ ಪ್ರಕಾಶನ ಸಂಸ್ಥೆಗಳ, ಪುಸ್ತಕ ಮಳಿಗೆಗಳ ಇಂತಹ ಧೋರಣೆ ಕೊನೆಗಾಣ ಸಲು1980ರ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಅಲ್ಲಿನ ಅಂಬೇಡ್ಕರರ ಅನುಯಾಯಿಗಳ ಒತ್ತಾಯದ ಫಲವಾಗಿ ಸರ್ಕಾರ ಸಂಪೂರ್ಣ ಇಂಗ್ಲಿಷ್ ಭಾಷೆಯಲ್ಲಿದ್ದ ಡಾ.ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳನ್ನು ಸಂಪುಟಗಳ ರೂಪದಲ್ಲಿ ಪ್ರಕಟಿಸಲು ಆರಂಭಿಸಿತು.

ಮಹಾರಾಷ್ಟ್ರದ ಈ ಯೋಜನೆಗೆ ಕೈಗೂಡಿಸಿದ ಇತರೆ ರಾಜ್ಯಗಳು ತಮ್ಮ ತಮ್ಮ ಭಾಷೆಗಳಲ್ಲಿ ಅವುಗಳನ್ನು ಅನುವಾದಿಸಿ ಪ್ರಕಟಿಸಿದವು. ಈ ನಡುವೆ ಬಾಬಾಸಾಹೇಬ್ ಅಂಬೇಡ್ಕರರ ಇಂಗ್ಲಿಷ್ ಬರಹಗಳಿಗೆ ಈ ಮಟ್ಟಿಗಿನ ರಾಷ್ಟ್ರವ್ಯಾಪಿ ಬೇಡಿಕೆ ಮತ್ತು ದಲಿತ ಸಂಘಟನೆಗಳಿಂದ ಒತ್ತಾಯ ಬಂದ ಹಿನ್ನೆಲೆಯಲ್ಲಿ 2004ರಲ್ಲಿ ಯುಪಿಎ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವೆಯಾದ ಕುಮಾರಿ ಶೆಲ್ಜಾರವರ ಒತ್ತಾಸೆಯ ಮೇರೆಗೆ ಮಹಾರಾಷ್ಟ್ರದ ಯೋಜನೆಯನ್ನು ಕೇಂದ್ರ ಸರ್ಕಾರ ಮುಂದುವರಿಸಿ ಅಂಬೇಡ್ಕರರ ಪುಸ್ತಕಗಳು ಎಲ್ಲೆಡೆ ದೊರೆಯಲಿಕ್ಕೆ ಕಾರಣವಾಯಿತು.

ಹಾಗೆಯೇ ಯುಪಿಎ ಸರ್ಕಾರ ಡಾ.ಅಂಬೇಡ್ಕರರ ಈ ಎಲ್ಲಾ ಬರಹಗಳ ಸಂಪುಟಗಳನ್ನು ಪಿಡಿಎಫ್ ಮೂಲಕ ಅಂತರ್ಜಾಲದಲ್ಲೂ ಪ್ರಕಟಿಸಿದೆ. ಆಸಕ್ತರು ಯಾರೂ ಬೇಕಾದರೂ ಅವುಗಳನ್ನು ಡೌನ್‌ಲೋಡ್ ಮಾಡಿಕೊಂಡು ಓದಬಹುದು. ಆದರೆ ಪ್ರಶ್ನೆಯೇನೆಂದರೆ ಭಾರತದ ಪುಸ್ತಕ ಮಳಿಗೆಗಳಲ್ಲಿ ಅಂಬೇಡ್ಕರರ ಈ ಪುಸ್ತಕಗಳ ಲಭ್ಯತೆ?

ಹಾಗಿದ್ದರೆ ಮಹಾರಾಷ್ಟ್ರ ಸರ್ಕಾರ ಪ್ರಕಟಿಸುವ ಮೊದಲು ಅವುಗಳು ಲಭ್ಯವಿರಲಿಲ್ಲವೆಂದೇ? ಪ್ರಕಟವಾಗಿರಲಿಲ್ಲವೆಂದೇ? ಅದಕ್ಕಾಗಿ ಪ್ರಕಾಶನ ಸಂಸ್ಥೆಗಳಿಗೆ ಈ ಕಾರ್ಯ ಸಾಧ್ಯವಾಗಲಿಲ್ಲವೆಂದೇ? ಹಾಗೇನಿಲ್ಲ, ಲಭ್ಯವಿತ್ತು, ಪ್ರಕಟವಾಗಿತ್ತು. ಬಾಬಾಸಾಹೇಬ್ ಅಂಬೇಡ್ಕರರ ಸಹಪಾಠಿ ವಾಲ್ಮೀಕಿ ಭಂಗಿ ಸಮುದಾಯದದಿ.ಭಗವಾನ್‌ದಾಸ್‌ರವರು1960, 70 ರ ಹೊತ್ತಿಗೆ “ದಸ್ ಸ್ಪೋಕ್ ಅಂಬೇಡ್ಕರ್ (ಅಂಬೇಡ್ಕರ್ ಹೀಗೆ ಹೇಳಿದರು)” ಹೆಸರಿನಲ್ಲಿ ಸ್ವಂತ ಖರ್ಚು ಮತ್ತು ಶ್ರಮದ ಮೂಲಕ ಸರಣ ರೂಪದಲ್ಲಿ ಪ್ರಕಟಿಸಿದರು.

ಹಾಗಿದ್ದರೂ ಭಾರತದ ಪುಸ್ತಕ ಮಳಿಗೆಗಳು ಅಂಬೇಡ್ಕರರ ಆ ಸಂಪುಟಗಳತ್ತ ಕಣ್ಣೆತ್ತಿಯೂ ನೋಡಲಿಲ್ಲ ಅಥವಾ ತಮ್ಮ ಮಳಿಗೆಗಳ ಮೂಲಕ ಮಾರಾಟ ಮಾಡಲು ಮುಂದೆ ಬರಲಿಲ್ಲ. ಯಾಕೆ ಹೀಗೆ? ಈ ಲೇಖನದ ಆರಂಭದಲ್ಲೇ ಪ್ರಸ್ತಾಪಿಸಿರುವ ಹಾಗೆ “ಕೆಲವು ದುಷ್ಟ ಶಕ್ತಿಗಳು”. ಹೌದು, ಕೆಲವು ದುಷ್ಟ ಶಕ್ತಿಗಳು, ಅಸ್ಪೃಶ್ಯತಾಚರಣೆಯ ಮನಸ್ಥಿತಿ ಹೊಂದಿರುವ ದುಷ್ಟ ಶಕ್ತಿಗಳು ಅವು. ಸಂವಿಧಾನ ವಿರೋಧಿ ಶಕ್ತಿಗಳು ಎಂದು ಕೂಡ ಹೇಳಬಹುದು.

ಯಾಕೆಂದರೆ ಸಂವಿಧಾನದ ಅನುಚ್ಛೇದ 19 “ಅಭಿವ್ಯಕ್ತಿ ಸ್ವಾತಂತ್ರ‍್ಯ” ನೀಡುತ್ತದೆ. ಆದರೆ ಇಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರರ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ತಡೆಯೊಡ್ಡಲಾಗಿದೆ. ಯಾವ ಮಟ್ಟಿಗೆ ಎಂದರೆ ಈಗಲೂ ವಯಕ್ತಿಕವಾಗಿ ಬಹುತೇಕರು ನನ್ನನ್ನು “ಸರ್, ಅಂಬೇಡ್ಕರರ ಬರಹಗಳ ಭಾಷಣಗಳ ಇಂಗ್ಲಿಷ್ ಸಂಪುಟಗಳು ಎಲ್ಲಿ ಸಿಗುತ್ತವೆ?” ಎಂದರೆ ನನಗೆ ಭಾರತದ ಯಾವ ಪುಸ್ತಕ ಮಳಿಗೆಗಳಲ್ಲಿ ಸಿಗುತ್ತದೆ ಎಂದು ಹೇಳಲಿಕ್ಕೆ ಖಂಡಿತ ಸಾಧ್ಯವಾಗುವುದಿಲ್ಲ. ಆ ಮಟ್ಟಿಗೆ ಅಂಬೇಡ್ಕರರ ಅಭಿವ್ಯಕ್ತಿ ಸ್ವಾತಂತ್ರ‍್ಯ ಅಸ್ಪೃಶ್ಯತಾಚರಣೆ ಮೂಲಕ ದಮನವಾಗಿದೆ.

ಅಂದಹಾಗೆ ಇದಕ್ಕೆ ಯಾರನ್ನು ದೂರುವುದು? ಯಾರು ಹೊಣೆ?

ಉತ್ತರ: ಈ ದೇಶದ ಹಿಂದುತ್ವವಾದಿ, ಜಾತಿವಾದಿ, ಮನುವಾದಿ ಮನಸ್ಸುಗಳು ಎಂದು ನೇರ ಹೇಳದೆ ವಿಧಿಯಿಲ್ಲ. ಪ್ರಶ್ನೆ ಏನೆಂದರೆ ಮುಂದಾದರೂ ಇಂತಹ ಪರಿಸ್ಥಿತಿ ತೊಲಗುವುದೇ? ಅಂಬೇಡ್ಕರರ ಬರಹಗಳು ಎಲ್ಲರಿಗೂ ಧಕ್ಕುವುದೇ, ಈ ದೇಶದ ಜನಸಾಮಾನ್ಯರ ಜ್ಞಾನ ದಾಹ ಹಿಂಗಿಸುವುದೇ? ಕಾದು ನೋಡಬೇಕಷ್ಟೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending