Connect with us

ದಿನದ ಸುದ್ದಿ

ಮೋದಿ – ಯಡಿಯೂರಪ್ಪ ಈ ದೇಶಕ್ಕೆ ಮತ್ತು ರಾಜ್ಯಕ್ಕೆ ಕೊರೊನಾಕ್ಕಿಂತಲೂ ಅಪಾಯಕಾರಿ : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೊರೊನಾ ಸೋಂಕಿನಲ್ಲಿ ಭಾರತವನ್ನು ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡುವ ಧಾವಂತದಲ್ಲಿದ್ದರೆ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೊರೊನಾ ಸೋಂಕಿನಲ್ಲಿ ಕರ್ನಾಟಕವನ್ನು ದೇಶದ ನಂಬರ್ ಒನ್ ಮಾಡುವ ಉತ್ಸಾಹದಲ್ಲಿದ್ದಾರೆ.ಈ ಇಬ್ಬರು ನಾಯಕರು ದೇಶಕ್ಕೆ ಮತ್ತು ರಾಜ್ಯಕ್ಕೆ ಕೊರೊನಾಕ್ಕಿಂತಲೂ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿನಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ ಭಾರತ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ತಮ್ಮ ದುರಾಡಳಿತದ ಮೂಲಕ ಈ ಜೋಡಿ ದೇಶವನ್ನು ಮತ್ತು ರಾಜ್ಯವನ್ನು ಕೊರೊನಾ ಸೋಂಕಿನಲ್ಲಿ ಮೊದಲ ಸ್ಥಾನಕ್ಕೇರಿಸಲು ಪಣತೊಟ್ಟಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಪ್ರತಿದಿನ ಕೊರೊನಾ ಸೋಂಕಿನ ಸರಾಸರಿ 10,000 ಪ್ರಕರಣಗಳು ದಾಖಲಾಗುತ್ತಿವೆ. ಸರಾಸರಿ 100 ಸಾವುಗಳಾಗುತ್ತಿವೆ. ಇಲ್ಲಿಯವರೆಗೆ 6.68 ಲಕ್ಷ ಜನರಿಗೆ ಕೊರೊನಾ ಸೋಂಕು ತಗಲಿದೆ. 1.16 ಲಕ್ಷಕ್ಕೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,. ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೇ ಕೊರೊನಾ ಸೋಂಕು ಬಡಿದಂತಿದೆ ಎಂದರು.

ರಾಜ್ಯದಲ್ಲಿ ಕೊರೊನಾ ಉಲ್ಭಣಗೊಳ್ಳಲು ಜನರ ನಿರ್ಲಕ್ಷ್ಯ ಕಾರಣ ಎಂಬ ಅತಿಪ್ರಚಾರದ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಕೊರೊನಾ ನಿಯಂತ್ರಣದಲ್ಲಿನ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ತನ್ನ ಆಡಳಿತದ ವೈಫಲ್ಯದಿಂದಾಗಿ ಖಾಲಿಯಾಗಿರುವ ಖಜಾನೆ ತುಂಬಿಸಲು ಮದ್ಯದಂಗಡಿಯಿಂದ ಮಾಲ್ ವರೆಗೆ, ದೇವಸ್ಥಾನಗಳಿಂದ ಹೊಟೇಲ್ ಗಳ ವರೆಗೆ ಎಲ್ಲವನ್ನು ತೆರೆದಿಟ್ಟು ಜನರನ್ನು ಕೈಬೀಸಿ ಕರೆಯುತ್ತಿರುವ ರಾಜ್ಯ ಸರ್ಕಾರ ಕೊರೊನಾ ಉಲ್ಭಣಗೊಳ್ಳಲು ಜನತೆಯೇ ಕಾರಣ ಎಂದು ದೂಷಿಸುತ್ತಿರುವುದು ಜನತೆಗೆ ಬಗೆಯುತ್ತಿರುವ ದ್ರೋಹ ಎಂದು ಕೆಂಡಾಮಂಡಲವಾದರು.

ಕೊರೊನಾ ಸೋಂಕಿನಿಂದಾಗಿ ಸಾವು-ನೋವು ಹೆಚ್ಚಲು ಮುಖ್ಯ ಕಾರಣ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯಲ್ಲಿನ ವೈಫಲ್ಯ. ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆ ಮೇಲೆ ನಂಬಿಕೆ ಇಲ್ಲ, ಖಾಸಗಿ ಆಸ್ಪತ್ರೆಗೆ ಹೋಗಲು ಕೈಯಲ್ಲಿ ದುಡ್ಡಿಲ್ಲ. ಇದರಿಂದಾಗಿ ಪರೀಕ್ಷೆ ಮಾಡಿಕೊಳ್ಳದೆ, ಸರಿಯಾದ ಚಿಕಿತ್ಸೆ ಪಡೆಯದೆ ನಿರ್ಲಕ್ಷಿಸುತ್ತಿದ್ದಾರೆ.

ಕೊರೊನಾ ಸೋಂಕು ರಾಜ್ಯದಲ್ಲಿ ಉಲ್ಭಣಗೊಳ್ಳಲು ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರವೇ ಕಾರಣ. ಕೊರೊನಾ ಸೋಂಕನ್ನು ಜನರ ಸೇವೆ ಮಾಡಲು ಅವಕಾಶ ಎಂದು ಭಾವಿಸದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ, ಇದು ದುಡ್ಡು ಮಾಡಲು ಒದಗಿಬಂದ ಸುವರ್ಣಾವಕಾಶ ಎಂದು ತಿಳಿದದ್ದೇ ಇಂದಿನ ದುಸ್ಥಿತಿಗೆ ಕಾರಣ.

ಮೊದಲ ದಿನದಿಂದಲೇ ತಪ್ಪು ನೀತಿಗಳು, ಅನಿಶ್ಚಿತ ನಿರ್ಧಾರಗಳು, ತಿದ್ದಿತಿರುಚಿದ ಅಂಕಿಅಂಶಗಳು, ಮುಖ್ಯಮಂತ್ರಿಗಳು ಮತ್ತು ಸಚಿವರ ನಿಷ್ಕ್ರಿಯತೆ ಮತ್ತು ಬ್ರಹ್ಮಾಂಡ ಭ್ರಷ್ಟಾಚಾರವೇ ಕರ್ನಾಟಕದ ಇಂದಿನ ದುಸ್ಥಿತಿಗೆ ಕಾರಣ. ಲಾಕ್ ಡೌನ್ ಹೇರಿಕೆಯಿಂದ ಇಲ್ಲಿಯ ವರೆಗೆ ರಾಜ್ಯ ಸರ್ಕಾರಕ್ಕೆ ಕೊರೊನಾ ನಿಯಂತ್ರಣದ ಬಗ್ಗೆ ಸ್ಪಷ್ಟತೆ ಇಲ್ಲ. ಅಜ್ಞಾನ, ಸುಳ್ಳು ಮತ್ತು ಮತ್ತು ಭ್ರಷ್ಟಾಚಾರ ಕೊರೊನಾಕ್ಕಿಂತಲೂ ಅಪಾಯಕಾರಿ.

ಯಾವ ಖಾಸಗಿ ಆಸ್ಪತ್ರೆಗಳು ಕೂಡಾ ಸರ್ಕಾರ ನಿಗದಿಪಡಿಸಿರುವಷ್ಟು ಹಾಸಿಗೆಗಳನ್ನು ನೀಡುತ್ತಿಲ್ಲ, ಸರ್ಕಾರ ನಿಗದಿಪಡಿಸಿರುವ ಚಿಕಿತ್ಸಾ ವೆಚ್ಚದ ಮಿತಿಯನ್ನು ಪಾಲಿಸುತ್ತಿಲ್ಲ. ಸಚಿವರ ಹೇಳಿಕೆಗಳು ಮಾಧ್ಯಮಗಳಿಗಷ್ಟೇ ಸೀಮಿತ. ಖಾಸಗಿ ಆಸ್ಪತ್ರೆಗಳ ಧಣಿಗಳ ಋಣಕ್ಕೆ ಬಿದ್ದಿರುವ ಸರ್ಕಾರಕ್ಕೆ ಅವರನ್ನು ನಿಯಂತ್ರಿಸುವ ಶಕ್ತಿಯೂ ಇಲ್ಲ. ಒಳಗಿಂದೊಳಗೆ ಎಲ್ಲರೂ ಷಾಮೀಲಾಗಿದ್ದಾರೆ.

ರಾಜ್ಯದಲ್ಲಿ ಬಿಬಿಎಂಪಿ ವ್ಯಾಪ್ತಿಯ 303 ಕೊರೊನಾ ಸೋಂಕಿತರು ಸೇರಿದಂತೆ 841 ಸೋಂಕಿತರು ವೆಂಟಿಲೇಟರ್ ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದರೆ, ತನ್ನ ವ್ಯಾಪ್ತಿಯಲ್ಲಿಯೇ 957 ಸೋಂಕಿತರು ವೆಂಟಿಲೇಟರ್ ನಲ್ಲಿದ್ದಾರೆ ಎಂದು ಬಿಬಿಎಂಪಿ ಹೇಳುತ್ತಿದೆ. ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಸುಳ್ಳಿನ ಮೊರೆ ಹೋಗುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ?

ಕಳೆದ ಆರು ತಿಂಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳೇನು ಎಂಬುದನ್ನು ಸತ್ಯನಿಷ್ಠವಾಗಿ ಜನತೆಯ ಮುಂದಿಡುವ ಧೈರ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೆಯೇ?ಸರ್ಕಾರಿ ಆಸ್ಪತ್ರೆಗಳಲ್ಲಿ ಎಷ್ಟು ಹಾಸಿಗೆ ಸಾಮರ್ಥ್ಯ ಹೆಚ್ಚಿಸಿದ್ದೀರಿ? ಹೊಸದಾಗಿ ಎಷ್ಟು ಆಮ್ಲಜನಕ ಪೂರೈಕೆಯ ಹಾಸಿಗೆಗಳನ್ನು ಮಾಡಿದ್ದೀರಿ? ಹೊಸದಾಗಿ ಖರೀದಿಸಿದ ವೆಂಟಿಲೇಟರ್ ಗಳೆಷ್ಟು? ಎನ್ನುವುದನ್ನು ತಿಳಿಸುವಿರಾ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ

Published

on

ಸುದ್ದಿದಿನ,ದಾವಣಗೆರೆ:ತಾಲ್ಲೂಕಿನ ಕಾಡಜ್ಜಿ ಗ್ರಾಮದ ದೇಗುಲಗಳಲ್ಲಿ ನಿಧಿ ಶೋಧಿಸಲು ಯತ್ನಿಸಿದ ಆರು ಜನರ ಆರೋಪಿಗಳನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಾಡಜ್ಜಿ ಗ್ರಾಮದ ಬಸವರಾಜ (42), ಮಲೇಬೆನ್ನೂರಿನ ಪ್ರಕಾಶ ಆಚಾರಿ (48), ಮಂಜುನಾಥ (51), ಪ್ರಕಾಶ (42), ಹೊನ್ನಾವರ ತಾಲ್ಲೂಕಿನ ಇಡಗುಂಜಿ ಗ್ರಾಮದ ರಾಮನಾಥ ಪೈ (52), ಸಾಗರ ತಾಲ್ಲೂಕಿನ ಬ್ಯಾಕೋಡು ಗ್ರಾಮದ ಶ್ರೀಕಾಂತ ಭಟ್ (51) ಬಂಧಿತರು.

ಆರೋಪಿಗಳು ಏ. 22ರಂದು ರಾತ್ರಿ ಕಾಡಜ್ಜಿ ಗ್ರಾಮದ ಚೌಡಮ್ಮ ದೇಗುಲದಲ್ಲಿ ನಿಧಿ ಶೋಧ ಮಾಡಿದ್ದರು. ಏ.29ರಂದು ರಾತ್ರಿ ಪೇಟೆ ದುರುಗಮ್ಮ ದೇಗುಲದ ಬಳಿ ಜೆಸಿಬಿ ಮೂಲಕ ಗುಂಡಿ ತೆಗೆದಿದ್ದರು. ದುಷ್ಟ ಶಕ್ತಿ ಪೂಜೆ, ಹೋಮ– ಹವನ ಮಾಡಿ ಗರ್ಭಗುಡಿಯಲ್ಲಿ ನಿಧಿ ತೆಗೆಯಲು ಮುಂದಾಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಆರೋಪಿಗಳನ್ನು ಹಿಡಿಯಲು ಯತ್ನಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು 

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.

ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ  ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’  ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್‌ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ  ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು.  ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.

ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್‌ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್‌ಸಿ  ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್‌ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.

ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.

ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.

ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್‌ ಕುಮಾರ್‌, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್‌ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ

ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್‌ ಶೇ. 97 ದ್ವಿತೀಯ ಹಾಗೂ ಸಮರ್ಥ್‌ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.

ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.

ಯಶಸ್ಸಿನ ಹಿಂದಿನ ಶಕ್ತಿ:

ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್‌, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending