Connect with us

ದಿನದ ಸುದ್ದಿ

ಭಾರತವು ವಿಶ್ವದ ಆತ್ಮಹತ್ಯೆಗಳ ರಾಜಧಾನಿಯಾಗಿ ಬಿಂಬಿತವಾಗುತ್ತಿದೆ : ಡಾ. ಮೋಹನ್ ಕಳವಳ

Published

on

ಸುದ್ದಿದಿನ, ಮೈಸೂರು : ದಿ ಚೇಂಜ್ ಮೇಕರ್ಸ್ ಟಾಕ್ ಶೋ “ವೀ ದಿ ಸೊಸೈಟಿ” ವತಿಯಿಂದ, ಅಕ್ಟೋಬರ್ 10 ರಂದು, ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ನಗರದ ಹೋಟೆಲ್ ಕಲ್ಯಾಣಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ಶಾಸ್ತ್ರ ನಿಕಾಯದ ಡೀನ್ ಅವರಾದ ಪ್ರೊಫೆಸರ್ ಆನಂದ್ ಅವರು ಉದ್ಘಾಟಿಸಿದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೇರಳದ, ಕಾಸರಗೋಡಿನಲ್ಲಿರುವ ಕೇಂದ್ರ ವಿಶ್ವವಿದ್ಯಾನಿಲಯದ, ಸಮಾಜ ಕಾರ್ಯ ವಿಭಾಗದ ಡೀನ್ ಆಗಿರುವ ಡಾ. ಮೋಹನ್ ಹಾಗೂ ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಹಾಗೂ ತಂತ್ರಜ್ಞಾನ ನಿಕಾಯದ ಡೀನ್ ಅವರಾದ ಡಾ. ಜಿ ವೆಂಕಟೇಶ್ ಕುಮಾರ್ ಅವರು ಪಾಲ್ಗೊಂಡಿದ್ದರು.

ಮುಖ್ಯ ಅತಿಥಿ ಭಾಷಣ ಮಾಡಿದ ಡಾ. ಮೋಹನ್ ಮಾತನಾಡಿ. “ಇಂದು ವಿಶ್ವದಾದ್ಯಂತ ‘ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸುತ್ತಿದ್ದರೆ, ಇತ್ತ ನಮ್ಮ ದೇಶದಲ್ಲಿ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಭಾರತವು ವಿಶ್ವದ ಆತ್ಮಹತ್ಯೆಗಳ ರಾಜಧಾನಿ ಎಂದೇ ಬಿಂಬಿತವಾಗಿರುವುದು ನಮ್ಮನ್ನೆಲ್ಲಾ ತುಂಬಾ ಚಿಂತೆಗೀಡು ಮಾಡುವ ವಿಷಯವಾಗಿದೆ.

ಇಂದಿನ ಯುವ ಸಮೂಹಕ್ಕೆ ಸರಿಯಾದ ಮಾರ್ಗದರ್ಶನ ಇಲ್ಲದೇ ಖಿನ್ನತೆಗೆ ಒಳಗಾಗುತ್ತಿದೆ. ಈ ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಂತೂ, ಹಲವಾರು ಜನ ಸಾಮಾಜಿಕ ಹಾಗೂ ಆರ್ಥಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಕಳವಳಕಾರಿ ವಿಷಯವಾಗಿದೆ. ಇದನ್ನು ತಡೆಯುವುದು ನಮ್ಮೆಲರ ಜವಾಬ್ದಾರಿಯಾಗಿದ್ದು, ನಾವೆಲ್ಲರೂ ಕಾರ್ಯಪ್ರವೃತಃರಾಗಬೇಕು ಎಂಬ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ  “ಪರಿಣಾಮಕಾರಿ ಕಾರ್ಯಕ್ಷಮತೆಗಾಗಿ ಮಾನಸಿಕ ಯೋಗಕ್ಷೇಮದ ಮಾರ್ಗಗಳು” ಎಂಬ ವಿಷಯದ ಕುರಿತು ಡಾ. ಜಿ ವೆಂಕಟೇಶ್ ಕುಮಾರ್ ಅವರು ಉಪನ್ಯಾಸ ನೀಡಿದರು. “ಇಂದಿನ ಯುವಕರು ಬೇಡದ ವಿಷಯಗಳಿಗೆ ತಲೆಕೆಡಿಸಿಕೊಂಡು ತಮ್ಮ ಜೀವನವನ್ನು ಒತ್ತಡದಲ್ಲಿ ಸಿಲುಕಿಸಿಕೊಳ್ಳುತ್ತಿದ್ದಾರೆ. ಜ್ಞಾನಕ್ಕೆ ಹೆಚ್ಚು ಒತ್ತು ಕೊಡಬೇಕಾದ ವಯಸ್ಸಿನಲ್ಲಿ, ದಾರಿ ತಪ್ಪಿ ಮನರಂಜನೆಗೆ ಹೆಚ್ಚು ಸಮಯ ಹಾಗೂ ಹಣವನ್ನು ವೆಚ್ಚ ಮಾಡಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.

ಇದರ ಹೊಣೆಯನ್ನು ಪೋಷಕರು, ಶಿಕ್ಷಕರು, ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಹೊತ್ತುಕೊಳ್ಳಬೇಕಾಗುತ್ತದೆ. ಯುವಕರು ಈ ದೇಶದ ಆಸ್ತಿಯಾಗಿದ್ದು, ಅವರಿಗೆ ಮಾನಸಿಕ ಸ್ವಾಸ್ಥದ ಬಗ್ಗೆ ತಿಳುವಳಿಕೆ ನೀಡಿ, ಸರಿಯಾದ ದಾರಿಯಲ್ಲಿ ಕರೆದುಕೊಂಡು ಹೋಗಬೇಕಾದ ಜವಾಬ್ಧಾರಿ ನಮ್ಮೆಲ್ಲರದು. ಎಲ್ಲರೂ ಜೀವನದ ಸರಿಯಾದ ಅರ್ಥ ಮನಗಂಡರೆ, ಸುಖವಾದ ಜೀವನ ನೆಡೆಸಬಹುದು” ಎಂದು ಸಭಿಕರಲ್ಲಿ ತಿಳಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು, ದಿ ಚೇಂಜ್ ಮೇಕರ್ಸ್ ಟಾಕ್ ಶೋ ವೇದಿಕೆಯ ಮುಖ್ಯ ಮಾರ್ಗದರ್ಶಕ, ಕ್ರಾಂತಿರಾಜ್ ಒಡೆಯರ್ ನಿರ್ವಹಿಸಿದರು. ವೇದಿಕೆಯ ಸಂಸ್ಥಾಪಕ ಸತ್ಯಕೀರ್ತಿ, ಸಹ ಸಂಸ್ಥಾಪಕ ರವಿಕುಮಾರ್ ಜೆ, ಸಂಯೋಜಕ ತೇಜಸ್ ಹಾಗೂ ಕಾರ್ಯದರ್ಶಿ ಸಂದೀಪ್ ಈಶ್ಯಾನ್ಯ ಸಂದರ್ಭದಲ್ಲಿ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending