ದಿನದ ಸುದ್ದಿ
ಕಲ್ಲು ಕ್ವಾರಿ ವಿರುದ್ದ ಎಫ್‍ಐಆರ್ ದಾಖಲು | ಕಲ್ಲುಗಣಿ ಮತ್ತು ಕ್ರಷರ್ ಘಟಕಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸದಿದ್ದರೆ ಕ್ರಮ : ಡಿಸಿ ಮಹಾಂತೇಶ ಬೀಳಗಿ ಎಚ್ಚರಿಕೆ
ಸುದ್ದಿದಿನ,ದಾವಣಗೆರೆ : ಕಲ್ಲು ಗಣಿ ಮತ್ತು ಕ್ರಷರ್ ಘಟಕಗಳು 15 ದಿನಗಳ ಒಳಗಾಗಿ ತಮ್ಮ ಕಾರ್ಯಕ್ಷೇತ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಹಾಗೂ ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕು. ಇಲ್ಲದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಖನಿಜ ಪ್ರತಿಷ್ಟಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು, ಕಂಟ್ರಾಕ್ಟರ್‍ಗಳು ಒಂದೂವರೆ ತಿಂಗಳು ಸ್ಟೋರೇಜ್ ಇರುವ ಸಿಸಿ ಕ್ಯಾಮೆರಾ ಅಳವಡಿಸಿ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ವರದಿ ನೀಡಬೇಕು. ಪೊಲೀಸರು ಟಾಸ್ಕ್‍ಪೋರ್ಸ್ ಸಮಿತಿಗೆ ಈ ಕುರಿತು ವರದಿ ಮಾಡಬೇಕೆಂದರು.
ಗ್ರಾಮಾಂತರ ಉಪವಿಭಾಗದ ಡಿವೈಎಸ್‍ಪಿ ನರಸಿಂಹ ವಿ.ತಾಮ್ರಧ್ವಜ ಮಾತನಾಡಿ, ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು, ಕಂಟ್ರಾಕ್ಟರ್ ಸಿಸಿ ಟಿವಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ನೆಟ್‍ವರ್ಕ್ ವಿಡಿಯೋ ರೆಕಾರ್ಡಿಂಗ್(ಎನ್‍ವಿಆರ್)ವ್ಯವಸ್ಥೆ ಮೂಲಕ ಕೂತಿರುವಲ್ಲೇ ಸ್ಥಳದ ಘಟನಾವಳಿಯನ್ನು ವೀಕ್ಷಿಸಬಹುದಾಗಿದೆ ಎಂದರು.
ದಾವಣಗೆರೆ ಜಿಲ್ಲೆ ವ್ಯಾಪ್ತಿಯ ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿ, ಚಿಕ್ಕಬಿದರಿ, ಅಚ್ಯುತಪುರ, ಹಿರೇಬಾಸೂರು, ರಾಂಪುರ, ಕುರುಡಿಹಳ್ಳಿ ಇತರೆಡೆ ಹಾಗೂ ಹರಿಹರ ತಾಲ್ಲೂಕಿನ ಸಾರತಿ, ರಾಜನಹಳ್ಳಿ, ಬಿಳಸನೂರು ಸೇರಿದಂತೆ ಅಧಿಕೃತ ಮರಳು ಬ್ಲಾಕ್‍ಗಳು ಇರುವೆಡೆ ಟಾಸ್ಕ್‍ಫೋರ್ಸ್ ಸಮಿತಿಯ ಅಧಿಕಾರಿಗಳು ರಾತ್ರಿ ವೇಳೆ ಓಡಾಡಿ, ಪರಿಶೀಲನೆ ನಡೆಸಬೇಕು. ಅನಧಿಕೃತ ಚಟುವಟಿಕೆ ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ | ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ : ಪಿಟಿಐ ಸುದ್ದಿ ಸಂಸ್ಥೆ ಪ್ರತಿನಿಧಿ ಎ. ಲಕ್ಷ್ಮೀದೇವಿ
ಪರ್ಮಿಟ್ ಇಲ್ಲದೇ ಮರಳು ಸಾಗಿಸುವುದು, ಸಂಗ್ರಹಿಸುವುದರ ವಿರುದ್ದ ದಂಡ ಹಾಕಬೇಕು. ಬಂಡಿಗಳಲ್ಲಿ ಮನೆ ಉದ್ದೇಶಕ್ಕೆ ಮರಳು ಉಪಯೋಗಿಸಬಹುದು. ಆದರೆ ವ್ಯವಹಾರಕ್ಕೆ ಬಳಸಿಕೊಳ್ಳಬಾರದು. ಚಕ್ಕಡಿ ಸೇರಿದಂತೆ ಇತರೆ ದೊಡ್ಡ ವಾಹನಗಳು ಒಂದು ಪರ್ಮಿಟ್ ಪಡೆದು ಅನಧಿಕೃತವಾಗಿ ಬಹಳಷ್ಟು ಮರಳು ಹೊಡೆದು ಸರ್ಕಾರಕ್ಕೆ ರಾಜಧನ ನೀಡದೇ ಹಾನಿ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು ಇಂತಹವರ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು. ಅನಧಿಕೃತ ಚಟುವಟಿಕೆಯನ್ನು ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಹಾಗೂ ನಿಯಮಾನುಸಾರ ದಂಡ ಸಂಗ್ರಹ ಮಾಡುವಂತೆ ಸೂಚನೆ ನೀಡಿದರು.
ಅಕ್ರಮ ಮರಳು ಬಳಕೆ ತಡೆಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸ್ಕ್ವಾಡ್ ತಂಡಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಎಸಿಯವರು ಈ ಬಗ್ಗೆ ಸಭೆ ಕರೆದು ಸೂಚನೆಗಳನ್ನು ನೀಡಬೇಕೆಂದರು.
ಆರ್‍ಟಿಓ ಶ್ರೀಧರ್ ಮಲ್ಲಾಡ್ ಮಾತನಾಡಿ, ರಸ್ತೆಯಲ್ಲಿ ಸ್ಪೀಡ್ ಕಂಟ್ರೋಲರ್ ಮತ್ತು ಜಲ್ಲಿ ಮತ್ತು ಮರಳು ಗಾಡಿಗಳಿಂದ ಹಿಂದಿನ ಗಾಡಿಗಳಿಗೆ ಜಲ್ಲಿ ಮರಳು ಸಿಡಿದು ಹಾನಿಯಾಗುವುದನ್ನು ತಪ್ಪಿಸಲು ಟಾರ್ಪಲಿನ್ ಕವರ್ ಮಾಡಿಕೊಂಡು ಹೋಗುವ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕೆಂದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಲೋಡ್ ಆದ ವಾಹನಗಳು ಸೇರಿದಂತೆ ಇತರೆ ವಾಹನಗಳಿಗೂ ಸ್ಪೀಡ್ ಕಂಟ್ರೋಲರ್ ಅಳವಡಿಸಲು ಆರ್‍ಟಿಓ ಕ್ರಮ ವಹಿಸುವಂತೆ ಹಾಗೂ ಟಾರ್ಪಲಿನ್ ಕವರ್ ಮಾಡದಿದ್ದರೆ ದಂಡ ಹಾಕುವಂತೆ ಜೊತೆಗೆ ಟಾರ್ಪಲಿನ್ ಕವರ್ ಮಾಡುವ ಮೂಲಕ ಇತರೆ ವಾಹನಗಳಿಗೆ ಹಾನಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಕಲ್ಲು ಕ್ವಾರೆ ನಿರ್ವಹಣೆ ಬಗ್ಗೆ ಸೂಚನೆ
ನಿಯಮ ಮೀರಿ ಯಾವುದೇ ರೀತಿಯ ಕಾನೂನು ಬಾಹಿರ ಕಲ್ಲುಕ್ವಾರೆ ಮಾಡುವಂತಿಲ್ಲ. ಲೈಸನ್ಸ್‍ನಲ್ಲಿ ಇರುವ ಷರತ್ತು ಮತ್ತು ನಿಯಮಗಳಿಗೆ ಅನುಗುಣವಾಗಿ ಕಲ್ಲು ಕ್ವಾರೆ ನಡೆಸಬೇಕು. ಸ್ಪೋಟಕವಾಗುವ ಸ್ಥಳದ 15 ಮೀಟರ್ ಒಳಗೆ ಧೂಮಪಾನ ನಿಷೇಧ. 24 ಗಂಟೆ ಭದ್ರತಾ ಸಿಬ್ಬಂದಿ ನೇಮಕ, ಸ್ಪೋಟಕ ವ್ಯಾನ್ ಹೆಚ್ಚಿನ ಸಮಯದವರೆಗೆ ಸಾರಿಗೆ ರಸ್ತೆಯಲ್ಲಿ ನಿಲ್ಲಿಸಬಾರದು.
ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೆ ಸ್ಪೋಟಕಗಳನ್ನು ಸಾಗಿಸಬಾರದು. ಸಿಸಿ ಕ್ಯಾಮೆರಾ ನಿರಂತರ ನಿರ್ವಹಿಸುವಂತೆ ಕ್ರಮ ಸೇರಿದಂತೆ ಇನ್ನಿತರೆ ಮುಖ್ಯವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು.
ಎಫ್‍ಐಆರ್ ದಾಖಲು
ಗ್ರಾಮಾಂತರ ಡಿವೈಎಸ್‍ಪಿ ನರಸಿಂಹ ತಾಮ್ರಧ್ವಜ ಮಾತನಾಡಿ, ಕಲ್ಲುಕ್ವಾರಿಯಲ್ಲಿ ಅನಧಿಕೃತ ಎಲೆಕ್ಟ್ರಿಕ್ ಡಿಟೋನೇಷನ್ ಇರುವ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿರುವ ಬಗ್ಗೆ ಮಾತನಾಡಿ, ಈ ಸಂಬಂಧ ಎಫ್‍ಐಆರ್ ದಾಖಲು ಮಾಡಲಾಗಿದೆ. ಎಕ್ಸ್‍ಪ್ಲೊಸಿವ್ ಸಬ್‍ಸ್ಟೆನ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ನೆಗಳೂರಿನ ಲಿಂಗನಗೌಡ ಎಂಬುವವರು ಆಲೂರುಹಟ್ಟಿ ಗ್ರಾಮದ ಕುಮಾರನಾಯ್ಕ ಎಂಬುವವರ ಕಲ್ಲು ಕ್ವಾರಿಯ ಬಗ್ಗೆ ನೀಡಲಾದ ದೂರಿನನ್ವಯ ಪೋಲೀಸ್ ಉಪಾಧೀಕ್ಷಕರು, ಪಿಎಸ್‍ಐ, ಭೂವಿಜ್ಞಾನಿಗಳು, ಬ್ಲಾಸ್ಟಿಂಗ್ ತಜ್ಞರು ಸ್ಥಳ ಪರಿಶೀಲನೆ ನಡೆಸಿದಾಗ ಕಲ್ಲು ಕ್ವಾರಿಯನ್ನು ನಡೆಸುತ್ತಿರುವ ಆಲೂರು ಗ್ರಾಮದ ಸರ್ವೇ ನಂ.68/9 ರಲ್ಲಿ ಒಂದು ಜೀವಂತ ಎಲೆಕ್ಟ್ರಿಕ್ ಡಿಟೋನೇಟರ್ ಪತ್ತೆಯಾಗಿದ್ದು ಪಂಚನಾಮೆಯನ್ನು ಜರುಗಿಸಿ ಡಿಟೋನೇಟರ್‍ನ್ನು ಅಮಾನತ್ತುಪಡಿಸಿಕೊಂಡು ಅದನ್ನು ಸುರಕ್ಷತೆ ದೃಷ್ಟಿಯಿಂದ ಕಾಡಜ್ಜಿ ಗ್ರಾಮದಲ್ಲಿರುವ ಮ್ಯಾಗ್ಜಿನ್‍ನಲ್ಲಿ ಇಡಲು ಕ್ರಮ ವಹಿಸಲಾಗಿದೆ. ಹಾಗೂ ಈ ದೂರಿನನ್ವಯ ಸೂಕ್ತ ಕ್ರಮ ಕೈಗೊಳ್ಳಲು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.
ಡಿಸಿ ಯವರು ಮಾತನಾಡಿ, ತಾಲ್ಲೂಕು ಮಟ್ಟದಲ್ಲಿ ಇಓ, ಟಿಹೆಚ್‍ಓ ಮತ್ತು ತಹಶೀಲ್ದಾರರು ನಿಯಮಿತವಾಗಿ ಕೋವಿಡ್ ಟಾಸ್ಕ್‍ಫೋರ್ಸ್ ಸಮಿತಿ ಸಭೆ ನಡೆಸಬೇಕು. ಕೋವಿಡ್ ಎರಡನೇ ಅಲೆ ಬಾರದಿರಲಿ. ಸ್ವಯಂ ನಿಯಂತ್ರಣ ಹೇರಿಕೊಳ್ಳುವುದು ಅತಿ ಮುಖ್ಯ ಎಂದು ಸೂಚಿಸಿದರು.
ಶಿಷ್ಟಾಚಾರ ಪಾಲಿಸುವಂತೆ ಸೂಚನೆ
ಸರ್ಕಾರದ ಕಾರ್ಯದರ್ಶಿಗಳು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರಿ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಕಡ್ಡಾಯವಾಗಿ ಶಿಷ್ಚಾಚಾರ ಪಾಲಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಒಳಗೊಂಡಂತೆ ಸರ್ಕಾರದ ಆ ಇಲಾಖೆಯ ಅಧಿಕೃತ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಯ ಸಚಿವರ ಸಮಾಲೋಚನೆಯೊಂದಿಗೆ ನಿಗದಿಪಡಿಸಿ ಕಾರ್ಯಕ್ರಮವನ್ನು ಏರ್ಪಡಿಸತಕ್ಕದ್ದು. ಸರ್ಕಾರಿ ಕಾರ್ಯಕ್ರಮ ನಡೆಸಲು ಕನಿಷ್ಟ ಪಕ್ಷ 7 ದಿನಗಳ ಸಮಯಾವಕಾಶವನ್ನು ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೋರಬೇಕು ಎಂದು ತಿಳಿಸಿರುತ್ತಾರೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಹಿರಿಯ ಭೂವಿಜ್ಞಾನಿ ಕೋದಂಡರಾಮ, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಡಿಹೆಚ್‍ಓ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಡಿಡಿ ವಿಜಯಕುಮಾರ್, ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮತದಾರ ದೇವರು’ ಎಂದ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇರು ನಟ ಡಾ.ರಾಜ್‌ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ಎಂದರು.
ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.
ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.
ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.
ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.
ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.
ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.
ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ
ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.
ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.
ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.
ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.
ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.
ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.
ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.
ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.
ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.
ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್‌ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್‌ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.
ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.
ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.
ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.. ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗ್ರಾಮ ಆಡಳಿತಾಧಿಕಾರಿ ಕೋಸಗಿ ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹುಲಿಕಟ್ಟೆ ಸರ್ಕಲ್ ವ್ಯಾಪ್ತಿಯ ಹಾರಕನಾಳು, ಹುಲಿಕಟ್ಟೆ, ಚನ್ನಳ್ಳಿ ತಾಂಡ, ಈಶಾಪುರ, ಹಾರಕನಾಳು ಸಣ್ಣತಾಂಡ, ಹಾರಕನಾಳು ದೊಡ್ಡತಾಂಡ, ಕನ್ನಾಯಕನಹಳ್ಳಿ ಸೇರಿ ಒಟ್ಟು 07 ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೋಸಗಿ ಸುರೇಶ ಎಂಬುವವರು ರೈತರೊಂದಿಗೆ ಒಪ್ಪಂದ ಮಾಡಿಕೊಂಡು, ಪ್ರತಿ ವರ್ಷ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಬೆಳೆಗಳಿಗೆ ತಾವೇ ಎಲ್ಲಾ ರೈತರ ಜಮೀನಿಗೆ ಬೆಳೆ ವಿಮೆ ಹಣ ಪಾವತಿಸುವ ಮೂಲಕ ನಿರಂತರವಾಗಿ 3 ವರ್ಷಗಳಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತ ಬಂದಿರುವ ಮಾಹಿತಿಯು ಸಾಕಷ್ಟು ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ಈ ಬಗ್ಗೆ ರೈತರು ಸಾಕಷ್ಟು ಪ್ರತಿಭಟನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೂ ದೂರು ನೀಡಿರುತ್ತಾರೆ.
ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯಲ್ಲಿನ ಭ್ರಷ್ಟಚಾರದ ಪ್ರಮುಖ ರೂವಾರಿಯಾದ ಕೋಸಗಿ ಸುರೇಶ ಎಂಬುವವರು ತಾವು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಗುಂಡಗತ್ತಿ ಸರ್ಕಲ್ ವ್ಯಾಪ್ತಿಯ ಬಹು ಗ್ರಾಮಗಳಲ್ಲಿಯೂ ಫಸಲ್ ಭೀಮಾ ಯೋಜನೆಯಲ್ಲಿ (ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ) ಸಾಕಷ್ಟು ಅವ್ಯವಹಾರ ನಡೆಸುತ್ತ ಬಂದಿರುತ್ತಾರೆ ಎಂಬ ಅಧಿಕೃತ ಮಾಹಿತಿ ಇರುತ್ತದೆ. ಇವರು ತಾವು ಕೆಲಸ ಮಾಡಿದ ಎಲ್ಲಾ ಸ್ಥಳಗಳಲ್ಲಿಯೂ ಸಾಕಷ್ಟು ಅವ್ಯವಹಾರದಲ್ಲಿ ಭಾಗಿಯಾಗಿದ್ದು, ಸಾಕಷ್ಟು ರೈತರಿಗೆ ಸರ್ಕಾರಿ ಯೋಜನೆಗಳನ್ನು ಮಾಡಿಸಿಕೊಡುವುದಾಗಿ ಕೋಟ್ಯಾಂತರ ರೂಪಾಯಿ ಲಂಚ ಪಡೆದಿರುತ್ತಾರೆ. ಹಾಗೆಯೇ ಬಡವರು, ಅಸಹಾಯಕರ ಜಮೀನುಗಳನ್ನು ಪ್ರಬಲರ ಹೆಸರಿಗೆ ವರ್ಗಾಹಿಸುವ ನೀಚ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ.
ಬಡವರ ಜಮೀನುಗಳನ್ನು ಪ್ರಬಲರ ಹೆಸರಿಗೆ ಮಾಡಿದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದು ನಂತರ ಮೂಲ ಖಾತೆದಾರರಿಗೆ ವರ್ಗಾವಣೆಯಾಗಿರುವ ಸಾಕಷ್ಟು ನಿದರ್ಶನಗಳಿಗೆ. ಆದರೆ ಯಾವುದೇ ಒಂದು ಪ್ರಕರಣದಲ್ಲಿಯೂ ಈ ಅಧಿಕಾರಿಗೆ ಶಿಕ್ಷೆಯಾಗದಂತೆ ಹಿರಿಯ ಅಧಿಕಾರಿಗಳರಿವರನ್ನು ಕಾಪಾಡಿಕೊಂಡು ಬಂದಿರುತ್ತಾರೆ. ಈ ಕಾರಣಕ್ಕಾಗಿಯೇ ಫಸಲ್ ಭೀಮಾ ಯೋಜನೆಯಂತಹ ದೊಡ್ಡ ಮಟ್ಟದ ಹಗರಣಕ್ಕೂ ಮುಂದಾಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಫಸಲ್ ಭೀಮಾ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿರುವ ಹಾರಕನಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಎಂ.ಶಿವಣ್ಣ, ಕಂದಾಯ ನಿರೀಕ್ಷಕ ಶ್ರೀ ರಾಘವೇಂದ್ರ, ಹರಪನಹಳ್ಳಿ ತಾಲ್ಲೂಕು ಉಪ ತಹಶೀಲ್ದಾರರಾದ ಶ್ರೀಮತಿ ಕವಿತಾ, ತಹಶೀಲ್ದಾರರಾದ ಶ್ರೀ ಬಿ.ವಿ. ಗಿರೀಶ್‌ಬಾಬು, ಉಪವಿಭಾಗಾಧಿಕಾರಿಯಾದ ಶ್ರೀ ಸುರೇಶ್‌ಕುಮಾರ್ ಟಿ, ಹರಪನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ವೈ.ಹೆಚ್. ಚಂದ್ರಶೇಖರ್, ವಿಜಯನಗರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕವಿತಾ ಮನ್ನಿಕೇರಿ ಇವರುಗಳ ವಿರುದ್ಧ ದೂರು ದಾಖಲಿಸಿ, ಈ ಎಲ್ಲಾ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ ಎಂಬುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು ಮೇ 29 ಮತ್ತು 30 ರಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಂಗಸಂಸ್ಥೆಯಾಗಿರುವ ಈ ಕಾಲೇಜಿನ ಉದ್ಘಾಟನಾ ಸಮಾರಂಭವು ಮೇ 29 ರ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದ್ದು, ದೇಶ ಹಾಗೂ ರಾಜ್ಯದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿ.ಟಿ.ಯು. ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ , ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಮಂಡಳಿ (FTE&M) ಅಧ್ಯಕ್ಷರಾದ ಪ್ರೊ. ಟಿ. ಜಿ. ಸಿತಾರಾಮ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ವಿ.ಟಿ.ಯು ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ರಿಜಿಸ್ಟ್ರಾರ್ ಡಾ. ಪ್ರಸಾದ್ ಬಿ ರಾಂಪುರೆ , ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಉಜ್ವಲ್ ಯು.ಜೆ , ಹಣಕಾಸು ಅಧಿಕಾರಿ ಡಾ. ಪ್ರಶಾಂತ್ ನಾಯಕ್ , ಯು.ಬಿ.ಡಿ.ಟಿ.ಇ ಪ್ರಾಂಶುಪಾಲರಾದ ಡಾ. ಡಿ. ಪಿ. ನಾಗರಾಜಪ್ಪ ಮತ್ತು ವಿವಿ ಪದಾಧಿಕಾರಿಗಳು ಕಾರ್ಯಕ್ರಮದ ಆತಿಥ್ಯ ವಹಿಸಲಿದ್ದಾರೆ.
ವಿಶೇಷ ಅತಿಥಿಗಳಾಗಿ ಶಾಸಕರುಗಳಾದ ಶಾಂತನಗೌಡ ಡಿ.ಜಿ., ಬಿ. ದೇವೇಂದ್ರಪ್ಪ, ಬಿ. ಪಿ. ಹರೀಶ್, ಶ್ರೀ ಬಸವರಾಜು ವಿ. ಶಿವಗಂಗಾ, ಕೆ. ಎಸ್. ಬಸವಂತಪ್ಪ, ಸಮರ್ಥ್ ಶಾಮನೂರು, ವಿಧಾನಪರಿಷತ್ ಸದಸ್ಯರುಗಳಾದ ಎಸ್.ಎಲ್. ಭೋಜೆಗೌಡ, ಡಿ.ಎಸ್.ಅರುಣ್, ಡಾ. ಧನಂಜಯ್ ಸರ್ಜಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಲೇಜಿನ ಹಳೆಯ ವಿದ್ಯಾರ್ಥಿ ಟಿ. ರಘುಮೂರ್ತಿ , ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಕಾಲೇಜಿನ ಹಳೆಯ ವಿದ್ಯಾರ್ಥಿ ಜನಾರ್ಧನ ಸ್ವಾ̧ಮಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇಂದು ಕರೆಂಟ್ ಇರಲ್ಲ
-
ದಿನದ ಸುದ್ದಿ3 days agoಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
-
ದಿನದ ಸುದ್ದಿ2 days ago‘ಮತದಾರ ದೇವರು’ ಎಂದ ಸಿದ್ದರಾಮಯ್ಯ


