Connect with us

ಬಹಿರಂಗ

ನಿರಂತರ ದೌರ್ಜನ್ಯದ ನಡುವೆ ಈ ಒಂದು ದಿನ

Published

on

  • ನಾ ದಿವಾಕರ

ತ್ತೊಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಮತ್ತೊಂದು ಒಕ್ಕೊರಲ ಪ್ರತಿರೋಧದ ದಿನ, ಮತ್ತೊಂದು ಕಪ್ಪು ಬಾವುಟ ಪ್ರದರ್ಶನ. ಭಾರತದಲ್ಲಿ ದೌರ್ಜನ್ಯಗಳ ವಿರುದ್ಧ ನಿರಂತರವಾಗಿ, ಶಾಶ್ವತವಾಗಿ ಹೋರಾಡುತ್ತಿರುವ ಸಮುದಾಯಗಳೆಂದರೆ ಅಸ್ಪೃಶ್ಯರು-ದಲಿತರು ಮತ್ತು ಮಹಿಳೆಯರು.

70 ವರ್ಷಗಳ ಸ್ವತಂತ್ರ ಆಳ್ವಿಕೆಯ ನಂತರವೂ ಒಂದು ಸಂವಿಧಾನಬದ್ಧ ಪ್ರಜಾಪ್ರಭುತ್ವದಲ್ಲಿ ಇದು ಅಪಭ್ರಂಶ ಎನಿಸಬಹುದು. ಆದರೆ ಇದು ಭಾರತದ ವಾಸ್ತವ. ವಸಾಹತು ಕಾಲಘಟ್ಟಕ್ಕಿಂತಲೂ ಕ್ರೂರವಾದ ಒಂದು ಆಡಳಿತ ವ್ಯವಸ್ಥೆಯನ್ನು ಈ ದೇಶದ ಮಹಿಳೆಯರು ಎದುರಿಸುತ್ತಿದ್ದಾರೆ.

ತುಳಿತಕ್ಕೊಳಗಾದ ಸಮುದಾಯಗಳ ಮಹಿಳೆಯರು ದಿನದಿಂದ ದಿನಕ್ಕೆ ಇನ್ನೂ ಹೆಚ್ಚಿನ ದೌರ್ಜನ್ಯ ಎದುರಿಸುತ್ತಿದ್ದಾರೆ. ಇತ್ತೀಚಿನ ಕೆಲವು ಪ್ರಸಂಗಗಳಲ್ಲಿ ನ್ಯಾಯ ವ್ಯವಸ್ಥೆಯೂ ಪಿತೃಪ್ರಧಾನ ಮೌಲ್ಯಗಳನ್ನು ಪುಷ್ಟೀಕರಿಸುವಂತಹ ತೀರ್ಪುಗಳನ್ನು ನೀಡುತ್ತಿದೆ.

ಮಹಿಳಾ ದಿನ ಎಂದ ಕೂಡಲೇ ಸಾಧಕರ ಪಟ್ಟಿಯನ್ನು ಸಿದ್ಧಪಡಿಸಲು ಮುದ್ರಣ-ವಿದ್ಯುನ್ಮಾನ ಮಾಧ್ಯಮಗಳು ತುದಿಗಾಲಲ್ಲಿ ನಿಂತಿರುತ್ತವೆ. ಮೇಡಂ ಕ್ಯೂರಿ ಇಂದ ಇತ್ತೀಚಿನ ಹಿಮಾದಾಸ್ವರೆಗೆ ಮಹಿಳಾ ಸಾಧಕಿಯರ ಚಿತ್ರಗಳು ರಾರಾಜಿಸುತ್ತವೆ. ಇದು ಅವಶ್ಯವೂ ಹೌದು.

ಏಕೆಂದರೆ ಈ ದೇಶದಲ್ಲಿ ಓರ್ವ ಹುಡುಗಿ ಹತ್ತನೆ ತರಗತಿಯಲ್ಲಿ ಪ್ರಥಮ ಸ್ಥಾನ ಗಳಿಸುವುದೇ ಪತ್ರಿಕೆಯ ಮುಖ್ಯ ಸುದ್ದಿಯಾಗುತ್ತದೆ. ಐಎಎಸ್ ತೇರ್ಗಡೆಯಾದ ಮಹಿಳೆ ಮುಖ್ಯ ಸುದ್ದಿಯಾಗುತ್ತಾಳೆ. ಅಂದರೆ ಮಹಿಳೆಯರ ಸಾಧನೆ ಸಹಜ ಸುದ್ದಿಯಾಗುವುದಕ್ಕಿಂತಲೂ ಸಂಭ್ರಮದ ಸುದ್ದಿಯಾಗುತ್ತದೆ. ಕಾರಣ, ಭಾರತದ ಪುರುಷ ಸಮಾಜದ ಆಂತರ್ಯದಲ್ಲಿ ಇನ್ನೂ ಸ್ತ್ರೀ ಸಂವೇದನೆ ಗಟ್ಟಿಯಾಗಿಲ್ಲ.

ಈ ಸೂಕ್ಷ್ಮ ದ್ವಂದ್ವ ನಮಗೆ ಅರ್ಥವಾಗುವುದು ಮಹಿಳೆಯರ ಮೇಲೆ ನಿರಂತರ ದೌರ್ಜನ್ಯಗಳು ನಡೆದಾಗ. ಒಬ್ಬ ಆಟೋ ಚಾಲಕನ ಮಗಳು, ಬೀದಿ ವ್ಯಾಪಾರಿಯ ಮಗಳು ಹತ್ತನೆ ತರಗತಿಯಲ್ಲಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ ಅವರ ಮನೆ ಬಾಗಿಲಿಗೆ ಹೋಗಿ ಸಂದರ್ಶನ ನಡೆಸಿ ಮೇಳೈಸುವ ದೃಶ್ಯ ಮಾಧ್ಯಮಗಳು, ಇದೇ ಶ್ರಮಜೀವಿಗಳ ಹೆಣ್ಣು ಮಕ್ಕಳು ಬಾಲ್ಯ ವಿವಾಹದ ಪೀಡನೆಗೆ ಬಲಿಯಾದಾಗ, ವೇಶ್ಯಾವಾಟಿಕೆಗೆ ಬಲಿಯಾದಾಗ, ಮಾನವ ಸಾಕಾಣಿಕೆಗೆ ಬಲಿಯಾದಾಗ, ಅತ್ಯಾಚಾರ ಮತ್ತು ಹತ್ಯೆಗೀಡಾದಾಗ, ಮರ್ಯಾದಾ ಹತ್ಯೆಗೀಡಾದಾಗ ಕಣ್ಣಿಗೆ ಪಟ್ಟಿ ಕಟ್ಟಿಕೊಂಡು ಕುಳಿತುಬಿಡುತ್ತವೆ. ಪುರುಷ ಸಮಾಜ ಮಹಿಳೆಯರನ್ನು ಭೋಗದ ವಸ್ತುವನ್ನಾಗಿ ನೋಡುವಂತೆಯೇ ಮಾಧ್ಯಮಗಳು ಟಿ ಆರ್ ಪಿ ಸರಕುಗಳಂತೆ ನೋಡುತ್ತವೆ. ನಿರ್ಭಯಾಳಿಂದ ಹಥ್ರಾಸ್ವರೆಗೆ ಈ ದ್ವಂದ್ವವನ್ನು ಗಮನಿಸುತ್ತಲೇ ಬಂದಿದ್ದೇವೆ.

ಮಹಿಳೆ ಎಂದಾಕ್ಷಣ ತಾಯಿ, ಮಗಳು, ಮಡದಿ, ಸೋದರಿ ಹೀಗೆ ಮನುಜ ಸಂಬಂಧಗಳ ಸಂಕೋಲೆಗಳಲ್ಲಿ ಬಂಧಿಯಾಗುವ ಚಿತ್ರಣವನ್ನೇ ವೈಭವೀಕರಿಸುತ್ತಾ, ಭವ್ಯ ಪರಂಪರೆ, ಸಂಸ್ಕೃತಿಯ ನೆಲೆಗಳಲ್ಲಿ ಮಹಿಳೆಯರ ಸ್ಥಾನಮಾನಗಳನ್ನು ನಿಷ್ಕರ್ಷೆ ಮಾಡುವ ನಾವು ಇದೇ ತಾಯಂದಿರು, ಅಕ್ಕ ತಂಗಿಯರು, ಹೆಣ್ಣು ಮಕ್ಕಳು, ಮಡದಿಯರು ಈ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು, ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡಲು, ಮನುಜ ಸೇತುವೆಗಳನ್ನು ಕಟ್ಟಲು, ಭವ್ಯ ಭಾರತವನ್ನು ಕಟ್ಟಲು ಹಗಲಿರುಳು ಶ್ರಮಿಸುವುದನ್ನು ಸಾಧನೆಗಳ ಶಿಖರಗಳ ಛಾಯೆಯಲ್ಲೇ ಕಾಣಲು ಬಯಸುತ್ತೇವೆ. ಈ ಸಾಧನೆಯ ಹಾದಿಯಲ್ಲಿ ಮಹಿಳೆಯರು ಅನುಭವಿಸುವ ನೋವು , ಸಂಕಷ್ಟ, ಬವಣೆ ಮತ್ತು ಕಿರುಕುಳಗಳು ನಮ್ಮ ಗಮನಕ್ಕೆ ಬರುವುದು ಹಾಳೆಗಳ ಮೇಲೆ ಮಾತ್ರ.

ಅಂಗನವಾಡಿ ಸಹಾಯಕರು, ಆಶಾ ಕಾರ್ಯಕರ್ತೆಯರು, ಆಸ್ಪತ್ರೆಗಳಲ್ಲಿ ದುಡಿಯುವ ದಾದಿಗಳು, ಪೌರ ಕಾರ್ಮಿಕರಾಗಿ ಶ್ರಮಿಸುವ ಕೋಟ್ಯಂತರ ಮಹಿಳೆಯರು ಪುರುಷ ಸಮಾಜದ ದರ್ಪ ಮತ್ತು ಅಟ್ಟಹಾಸದ ನಡುವೆಯೇ ನಿತ್ಯ ಕಿರುಕುಳ ಅನುಭವಿಸುವುದನ್ನು ಕಂಡೂ ಕಾಣದಂತೆ ಮೈಮರೆತಿರುತ್ತೇವೆ.

ಲೈಂಗಿಕ ಕಿರುಕುಳ ಅನುಭವಿಸುವವರಲ್ಲಿ ಈ ಕಾಯಕ ಜೀವಿಗಳಷ್ಟೇ ಇದ್ದಾರೆ ಎನ್ನುವುದು ಅರ್ಧಸತ್ಯ. ಸುಶಿಕ್ಷಿತ ಸಮಾಜದ ಒಂದು ಭಾಗವಾಗಿರುವ, ಮಧ್ಯಮ ವರ್ಗದವರೇ ತುಂಬಿರುವ ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ, ಕಾರ್ಖಾನೆಗಳಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲೂ ಮಹಿಳೆಯರು ಪುರುಷ ಸಮಾಜದ ಕಾಕದೃಷ್ಟಿಗೆ ಬಲಿಯಾಗುತ್ತಲೇ, ಮೌನಕ್ಕೆ ಜಾರಿರುತ್ತಾರೆ. ಕಾರ್ಯಕ್ಷೇತ್ರದಲ್ಲಿ ಲೈಂಗಿಕ ಕಿರುಕುಳವನ್ನು ನಿರ್ಬಂಧಿಸಲು, ನಿಯಂತ್ರಿಸಲು ಕಾನೂನು ಜಾರಿಮಾಡಿದ್ದರೂ ಇಂದಿಗೂ ಕಚೇರಿಗಳಲ್ಲಿ ಕಿರುಕುಳ ನಿಂತಿಲ್ಲ ಎನ್ನುವುದನ್ನು ಅನುಭವಿಸಿದವರೇ ಬಲ್ಲರು. ಇದು ಕಟು ವಾಸ್ತವ.

ಭಾರತದ ಸುಶಿಕ್ಷಿತ ಸಮಾಜ ಆಧುನಿಕತೆಯತ್ತ ಹೊರಳುತ್ತಿರುವಂತೆಲ್ಲಾ ತನ್ನ ಸೂಕ್ಷ್ಮ ಸಂವೇದನೆಯನ್ನೂ ಕಳೆದುಕೊಳ್ಳುತ್ತಿರುವುದನ್ನು ಈ ಬೆಳವಣಿಗೆಗಳಲ್ಲಿ ಕಾಣಬಹುದು. ರಾಜಕೀಯ ವಲಯದಲ್ಲಿ ಇಂದು ಮಹಿಳೆ ನಿರ್ಲಕ್ಷಿತಳಾಗುತ್ತಿದ್ದಾಳೆ. ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಚಾರಿತ್ರಿಕ ಮಸೂದೆ ಪುರುಷಾಧಿಪತ್ಯದ ಅಧಿಕಾರ ರಾಜಕಾರಣದಲ್ಲಿ ಶಾಶ್ವತವಾಗಿ ಕಳೆದುಹೋಗಿದೆ.

ತಮ್ಮ ಪ್ರಣಾಳಿಕೆಗಳಲ್ಲೂ ಈ ಮಸೂದೆಯನ್ನು ಜಾರಿಗೊಳಿಸುವ ಆಶ್ವಾಸನೆಯನ್ನು ಯಾವುದೇ ಪಕ್ಷಗಳು ನೀಡುತ್ತಿಲ್ಲ. ಏಕೆಂದರೆ ಹಿಂದುತ್ವ ರಾಜಕಾರಣದ ಸಾಂಸ್ಕೃತಿಕ ರಾಷ್ಟ್ರೀಯತೆಯ ಪರಿಕಲ್ಪನೆಯಲ್ಲಿ ಇದಕ್ಕೆ ಅವಕಾಶವೇ ಇರುವುದಿಲ್ಲ. ರಾಜಕೀಯ ಪಕ್ಷಗಳಲ್ಲೂ ಸಹ ಮಹಿಳಾ ಸದಸ್ಯರಿಂದ ಈ ನಿಟ್ಟಿನಲ್ಲಿ ಒತ್ತಾಯ ಕಾಣದೆ ಇರುವುದು ಗಮನಿಸಬೇಕಾದ ಅಂಶ.

ಇತ್ತೀಚಿನ ಕೆಲವು ಬೆಳವಣಿಗೆಗಳಲ್ಲಿ ನ್ಯಾಯಾಂಗದ ಆವರಣದಲ್ಲೂ ಸ್ತ್ರೀ ಸಂವೇದನೆಯೇ ಇಲ್ಲದ ಕೆಲವು ತೀರ್ಪುಗಳನ್ನು ಕಾಣುತ್ತಿದ್ದೇವೆ. ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಾಧೀಶರು ಒಂದು ಪ್ರಕರಣದಲ್ಲಿ ಸಂತ್ರಸ್ತೆಯು ಬಾಲಕಿಯಾಗಿದ್ದಾಗ ಆಕೆಯ ಮೇಲೆ ನಿರಂತರ ಲೈಂಗಿಕ ಅತ್ಯಾಚಾರ ನಡೆಸಿದ ವ್ಯಕ್ತಿಗೆ “ ಸಂತ್ರಸ್ತೆಯನ್ನು ಮದುವೆಯಾಗುವೆಯಾ ” ಎಂದು ಕೇಳುವ ಮೂಲಕ ಆಯ್ಕೆ ಸ್ವಾತಂತ್ರ್ಯವನ್ನು ನೀಡುತ್ತಾರೆ.

ಮದುವೆಯಾಗುವುದಾದರೆ ಶಿಕ್ಷೆಯಿಂದ ಪಾರಾಗಬಹುದಲ್ಲವೇ ? ಇದು ಸ್ತ್ರೀ ಸೂಕ್ಷ್ಮತೆಯನ್ನು ಕೊಲ್ಲುವಂತಹ ಒಂದು ಬೆಳವಣಿಗೆ. ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ಬೇಗುದಿಯನ್ನು, ಅಂತರಿಕ ವೇದನೆಯನ್ನು ಮತ್ತು ಆಕೆಯ ಹೆಣ್ತನವನ್ನು ಗೌರವಿಸದ ಸಮಾಜದಲ್ಲಿ ಮಾತ್ರವೇ ಇಂತಹ ಪ್ರಸಂಗಗಳನ್ನು ಕಾಣಲು ಸಾಧ್ಯ.

ಇದರ ವ್ಯತಿರಿಕ್ತ ಅತಿರೇಕವನ್ನು ದೇಶಾದ್ಯಂತ ನಿರಂತರವಾಗಿ ನಡೆಯುತ್ತಲೇ ಇರುವ ಮರ್ಯಾದಾ-ಗೌರವ ಹತ್ಯೆಗಳಲ್ಲಿ ” ಕಾಣುತ್ತಿದ್ದೇವೆ. ಅನ್ಯ ಜಾತಿಯವನನ್ನು, ಅನ್ಯ ಕೋಮಿನ ವ್ಯಕ್ತಿಯನ್ನು ಪ್ರೀತಿಸುವ ಹೆಣ್ಣು ಮಕ್ಕಳನ್ನು ನಿರ್ಭೀತಿಯಿಂದ ಕೊಲೆ ಮಾಡುವ ಅಲಿಖಿತ ಕಾನೂನು ಭಾರತದಲ್ಲಿ ಇಂದಿಗೂ ಜಾರಿಯಲ್ಲಿದೆ. ಇಲ್ಲಿ ಹೆಣ್ಣು ಮಾತ್ರ ಅಪರಾಧಿಯಾಗುತ್ತಾಳೆ, ಗಂಡು ತನ್ನ ಹಕ್ಕು ಪ್ರತಿಪಾದಿಸುತ್ತಾನೆ.

ಈ ಹತ್ಯೆಗಳನ್ನು ಮರ್ಯಾದಾ-ಗೌರವ ಹತ್ಯೆ ಎಂದು ಸಾಮಾನ್ಯವಾಗಿ ಗುರುತಿಸಲಾಗುವುದಾದರೂ, ಇದು ಯಾರ ಗೌರವ ಅಥವಾ ಮರ್ಯಾದೆಯನ್ನು ಉಳಿಸುತ್ತದೆ ಎನ್ನುವ ಜಿಜ್ಞಾಸೆ ಕಾಡುವುದಂತೂ ಸತ್ಯ. ಒಂದು ಪ್ರಬುದ್ಧ ಸಮಾಜ ಇಂತಹ ಅಮಾನುಷ ಹತ್ಯೆಗಳಿಗೆ ಮುಂದಾಗುವುದರಿಂದ ತನ್ನ ಗೌರವವನ್ನು, ಮರ್ಯಾದೆಯನ್ನು ಕಳೆದುಕೊಳ್ಳುತ್ತದೆ.

ಮತಾಂಧತೆಯಿಂದ ಆವರಿಸಲ್ಪಟ್ಟಿರುವ ಭಾರತದ ಜಾತಿ ಪೀಡಿತ ಸಮಾಜದಲ್ಲಿ ಹೆಣ್ಣು ಲಕ್ಷ್ಮಣ ರೇಖೆಯನ್ನು ದಾಟುವುದೇ ಗೌರವಕ್ಕೆ ಚ್ಯುತಿ ಬರುವ ಕೃತ್ಯ ಎನಿಸಿಬಿಡುತ್ತದೆ. ನಮ್ಮ ಸುಶಿಕ್ಷಿತ ಸಮಾಜಕ್ಕೆ ಈ ಹತ್ಯೆಗಳು ಅಪರಾಧ ಎನಿಸುವುದೇ ಇಲ್ಲ. ಕೆಲವೊಮ್ಮೆ ಅತ್ಯಾಚಾರಗಳೂ ತಪ್ಪು ಎನಿಸುವುದಿಲ್ಲ ಎನ್ನುವುದನ್ನು ಹಥ್ರಾಸ್ ಸಂದರ್ಭದಲ್ಲಿ ಕಂಡಿದ್ದೇವೆ, ನಿರ್ಭಯಾ ಘಟನೆಯಲ್ಲೂ ಕಂಡಿದ್ದೇವೆ. ದಲಿತ ಅಥವಾ ಅಲ್ಪ ಸಂಖ್ಯಾತ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳು, ಅತ್ಯಾಚಾರಗಳು ಭಾರತದ ಒಂದು ಬೃಹತ್ ಬೌದ್ಧಿಕ ವಲಯಕ್ಕೆ ಸ್ವೀಕಾರಾರ್ಹವೇ ಆಗಿಬಿಡುತ್ತದೆ.

ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪುವ ಸಂತ್ರಸ್ತೆಯನ್ನು ನಡುರಾತ್ರಿಯಲ್ಲಿ ಪೊಲೀಸರೇ ಸುಟ್ಟುಹಾಕಿದರೂ ನಮ್ಮ ಸಮಾಜ ವಿಚಲಿತವಾಗುವುದಿಲ್ಲ. 2018ರಲ್ಲಿ ಉತ್ತರಪ್ರದೇಶದ ಹಥ್ರಾಸ್ನಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ತಂದೆ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಆರೋಪಿಯಿಂದಲೇ ಹತ್ಯೆಗೀಡಾಗಿರುವುದು ಈ ಅಸೂಕ್ಷ್ಮತೆಯ ಮತ್ತೊಂದು ಮಜಲನ್ನು ನಮಗೆ ಪರಿಚಯಿಸುತ್ತದೆ.

ಲಿಂಗತ್ವ ಸಮಾನತೆಯನ್ನು ಸಾಧಿಸಲು ದೇಶದಲ್ಲಿ ಸಾಕಷ್ಟು ಕಾಯ್ದೆ ಕಾನೂನುಗಳನ್ನು ಜಾರಿಮಾಡಲಾಗಿದೆ. ನಿರ್ಭಯ ಪ್ರಕರಣದ ನಂತರದಲ್ಲಿ ವರ್ಮಾ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಕೆಲವು ಕಠಿಣ ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಇಂತಹ ಕಾಯ್ದೆಗಳಲ್ಲಿ ಒಂದು.

ಆದರೆ ಈ ಕಾಯ್ದೆಗಳನ್ನು ಜಾರಿಮಾಡುವ ನಿಟ್ಟಿನಲ್ಲಿ ಕಾರ್ಯಾಂಗ ಮತ್ತು ನ್ಯಾಯಾಂಗ ಸೋಲುತ್ತಲೇ ಇದೆ. ಸಮಾಜದಲ್ಲಿ ಅಂತರ್ಗತವಾಗಿರುವ ಪಿತೃಪ್ರಧಾನ ಧೋರಣೆ ಮತ್ತು ಪುರುಷ ಪ್ರಧಾನ ಮನಸ್ಥಿತಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಪ್ರಯತ್ನಗಳು ಕೇವಲ ಮಹಿಳಾ ಚಳುವಳಿಗಳಿಂದ ನಡೆಯುತ್ತಿವೆ.

ಮಹಿಳೆಯ ಘನತೆ ಮತ್ತು ಜೀವಿಸುವ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಭಾರತದ ನ್ಯಾಯಾಂಗ ಹಲವು ಚಾರಿತ್ರಿಕ ತೀರ್ಪುಗಳನ್ನು ನೀಡಿದೆ. ಇದೇ ವೇಳೆ ದೌರ್ಜನ್ಯಕ್ಕೊಳಗಾಗುವ ಮಹಿಳೆಯ ರಕ್ಷಣೆಗೆ ಬರುವಲ್ಲಿ ವಿಫಲವಾಗಿರುವುದನ್ನೂ ಭಾವರಿ ದೇವಿಯಂತಹ ಪ್ರಕರಣಗಳಲ್ಲಿ ಕಂಡಿದ್ದೇವೆ. ಇಂದಿಗೂ ಕಾಣುತ್ತಿದ್ದೇವೆ.

ಪಿತೃ ಪ್ರಧಾನ ಜಾತಿಪೀಡಿತ ಸಮಾಜದಲ್ಲಿ ನ್ಯಾಯ ವ್ಯವಸ್ಥೆಯನ್ನು ಪ್ರತಿನಿಧಿಸುವವರು ಜಾತ್ಯತೀತ ಮನೋಭಾವದೊಂದಿಗೇ ಸ್ತ್ರೀ ಸಂವೇದನೆಯನ್ನೂ ಹೊಂದಿರುವುದು ಎಷ್ಟು ಮುಖ್ಯ ಎನ್ನುವುದನ್ನು ಅನೇಕ ಪ್ರಕರಣಗಳಲ್ಲಿ ಗಮನಿಸಬಹುದು. ಇತ್ತೀಚೆಗೆ ಹಿಂದುತ್ವ ರಾಜಕಾರಣದ ಒಂದು ಭಾಗವಾಗಿಯೇ ರೂಪುಗೊಂಡಿರುವ ಲವ್ ಜಿಹಾದ್ ಕಾಯ್ದೆಗಳೂ ಸಹ ಮೂಲತಃ ಮಹಿಳಾ ವಿರೋಧಿಯಾಗಿದ್ದು ಇಲ್ಲಿಯೂ ಸಹ ಮಹಿಳೆಯ ಜೀವಿಸುವ ಹಕ್ಕು, ಘನತೆಯ ಹಕ್ಕು ಹಲ್ಲೆಗೊಳಗಾಗುತ್ತಿದೆ.

ಆಡಳಿತಾರೂಢ ಸರ್ಕಾರಗಳು ತಮ್ಮ ಸಾಂವಿಧಾನಿಕ ಹೊಣೆಗಾರಿಕೆಯನ್ನು ಮರೆತು ಖಾಪ್ ಪಂಚಾಯತ್ಗಳಿಗೆ, ಸಾಂಸ್ಕೃತಿಕ ಆರಕ್ಷಕ ಪಡೆಗಳಿಗೆ ಮತ್ತು ಧರ್ಮರಕ್ಷಕ ಗುಂಪುಗಳಿಗೆ ಮಾನ್ಯತೆ ನೀಡುವ ಮೂಲಕ ಪಿತೃಪ್ರಧಾನ ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ನೆರವಾಗುತ್ತಿವೆ. ಸಾಂಪ್ರದಾಯಿಕ ಶಕ್ತಿಗಳು ಮತ್ತು ಮತಾಂಧರು ಎಲ್ಲ ಧರ್ಮಗಳಲ್ಲೂ ಮಹಿಳೆಯರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದು, ಹೆಣ್ತನದ ಘನತೆಯನ್ನು ನಿರ್ಲಕ್ಷಿಸುತ್ತಿವೆ.

ಈ ಸಮಾಜೋ ಸಾಂಸ್ಕೃತಿಕ ಧೋರಣೆಗೆ ಪೂರಕವಾಗಿ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆಯೂ ಇಲ್ಲವಾಗುತ್ತಿರುವುದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಲು ಮುಖ್ಯ ಕಾರಣವಾಗಿದೆ. ಮಹಿಳಾ ಸಬಲೀಕರಣದ ಘೋಷಣೆಗಳು ಸಮಾಜದ ಮೇಲ್ ಸ್ತರದ ವರ್ಗಗಳನ್ನು ಮಾತ್ರವೇ ಹೆಚ್ಚಾಗಿ ತಲುಪುತ್ತಿದ್ದು, ತಳಮಟ್ಟದ ಗ್ರಾಮೀಣ ಮಹಿಳೆಯರು ಇಂದಿಗೂ ಪುರುಷ ಸಮಾಜದ ಅಧಿಪತ್ಯಕ್ಕೆ ಒಳಗಾಗಿದ್ದಾರೆ. ಕೃಷಿ ಕಾರ್ಮಿಕರಿಂದ ಹಿಡಿದು ಕಾರ್ಖಾನೆಯಲ್ಲಿ ದುಡಿಮೆ ಮಾಡುವ ಮಹಿಳೆಯರವರೆಗೆ, ವೇತನ ನಿಗದಿಪಡಿಸುವ ಸಂದರ್ಭದಲ್ಲೂ, ಈ ತಾರತಮ್ಯವನ್ನು ಗಮನಿಸಬಹುದಾಗಿದೆ.

ಇಂದು ಭಾರತೀಯ ಮಹಿಳೆ ನಾಲ್ಕೂ ದಿಕ್ಕುಗಳಿಂದ ತಾರತಮ್ಯ , ಕಿರುಕುಳ, ದೌರ್ಜನ್ಯ ಎದುರಿಸಬೇಕಿದೆ. ಆರ್ಥಿಕವಾಗಿ ಮಾರುಕಟ್ಟೆ ಆರ್ಥಿಕತೆ ಮಹಿಳೆಯರನ್ನು ಅಗ್ಗದ ಶ್ರಮ ಸರಕುಗಳಂತೆ ಭಾವಿಸುತ್ತದೆ. ತನ್ನ ಲಾಭ ಹೆಚ್ಚಿಸಿಕೊಳ್ಳಲು ಔದ್ಯಮಿಕ ವಲಯ ಕಡಿಮೆ ವೇತನ ನೀಡುವ ಮೂಲಕ, ಮುಷ್ಕರದ ಹಕ್ಕುಗಳನ್ನು ಕಸಿದುಕೊಳ್ಳುವ ಮೂಲಕ, ಹೆಚ್ಚಿನ ದುಡಿಮೆ ಮಾಡಿಸಿಕೊಳ್ಳುವ ಮೂಲಕ ಮಹಿಳೆಯರನ್ನು ಶೋಷಣೆಗೊಳಪಡಿಸುತ್ತಿದೆ.

ಇದನ್ನೂ ಓದಿ |ಎಸ್ ಎಸ್ ಸಿ ವತಿಯಿಂದ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಾಮಾಜಿಕವಾಗಿ ಮಹಿಳೆ ಪುರುಷ ಸಮಾಜ ತನ್ನ ಸುತ್ತಲೂ ನಿರ್ಮಿಸಲಾಗಿರುವ ಬೇಲಿಗಳನ್ನು ದಾಟಲು ನಿರಂತರ ಹೋರಾಟ ಮಾಡಬೇಕಿದೆ. ಸಾಂಸ್ಕೃತಿಕವಾಗಿ ಸಾಂಪ್ರದಾಯಿಕ-ಮತಾಂಧ ಶಕ್ತಿಗಳು ಮಹಿಳೆಯರನ್ನು ನಾಲ್ಕು ಗೋಡೆಗಳ ನಡುವೆ ಬಂಧಿಸಲು ಸದಾ ಸನ್ನದ್ಧವಾಗಿರುತ್ತವೆ. ಶಹೀನ್ಭಾಗ್ ಪ್ರತಿಭಟನೆಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರು “ ಪ್ರತಿಭಟನೆಯಲ್ಲಿ ಮಹಿಳೆಯರು ಭಾಗವಹಿಸುವುದೇಕೆ ?” ಎಂದು ಪ್ರಶ್ನಿಸುವ ಮೂಲಕ ಇದೇ ಮನಸ್ಥಿತಿಯನ್ನು ಬಿಂಬಿಸಿದ್ದರು.

ಇಷ್ಟರ ನಡುವೆ ಅತ್ಯಾಚಾರ ಇಂದು ನಿತ್ಯ ಸುದ್ದಿಯಾಗಿಬಿಟ್ಟಿದೆ. ಅತ್ಯಾಚಾರಕ್ಕೊಳಗಾದ ಮಹಿಳೆಯ ಹತ್ಯೆ ಮಾಡುವುದು ನಾಗರಿಕ ಸಮಾಜದ ಒಂದು ವರ್ಗಕ್ಕೆ ಸುದ್ದಿ ಎನಿಸುವುದೇ ಇಲ್ಲ. ಭಾರತದ ವಿದ್ಯುನ್ಮಾನ ಮಾಧ್ಯಮಗಳ ಸುದ್ದಿಮನೆಗಳಿಗೆ ಮಹಿಳೆಯರ ಮೇಲಿನ ಈ ದೌರ್ಜನ್ಯಗಳು ಟಿ ಆರ್ ಪಿ ಹೆಚ್ಚಿಸಿಕೊಳ್ಳುವ ರೋಚಕ ಸುದ್ದಿಗಳಾಗಿ ಕಾಣುತ್ತವೆ.

ಹಾಗಾಗಿಯೇ ಅವೈಜ್ಞಾನಿಕ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆ ಮತ್ತು ಅದರಲ್ಲೂ ಮಹಿಳಾ ವಲಸೆ ಕಾರ್ಮಿಕರು ಎದುರಿಸಿದ ದುರ್ಭರ ದಿನಗಳು ಮುನ್ನೆಲೆಗೆ ಬರಲೇ ಇಲ್ಲ. ಇಂದು ದೇಶಾದ್ಯಂತ ವ್ಯಾಪಕವಾಗಿ ನಡೆಯುತ್ತಿರುವ ರೈತ ಮುಷ್ಕರದ ಸಂದರ್ಭದಲ್ಲೂ ಮಹಿಳಾ ಕೃಷಿ ಕಾರ್ಮಿಕರ ಮತ್ತು ಮಹಿಳಾ ರೈತರ ಸಮಸ್ಯೆಗಳು ಹೆಚ್ಚಾಗಿ ಮುನ್ನೆಲೆಗೆ ಬರುತ್ತಿಲ್ಲ ಎನ್ನುವುದೂ ಗಮನಿಸಬೇಕಾದ ಸಂಗತಿ.

ವಿಶ್ವ ಮಹಿಳಾ ದಿನ ಕೇವಲ ಮಹಿಳೆಯರ ಪ್ರತಿರೋಧದ ದಿನ ಆಗಬಾರದು, ಮಹಿಳೆಯರ ಹಕ್ಕೊತ್ತಾಯಗಳ ದಿನ ಆಗಬಾರದು. ಮಾರ್ಚ್ 8 ಭಾರತದಂತಹ ಸಾಂಪ್ರದಾಯಿಕ ಸಮಾಜಕ್ಕೆ ಆತ್ಮಾವಲೋಕನದ ದಿನ ಆಗಬೇಕು. ಈ ಒಂದು ದಿನವಾದರೂ ಆತ್ಮಾವಲೋಕನದ ಬಗ್ಗೆ ಆಲೋಚನೆ ಮಾಡುವ ಮನಸ್ಥಿತಿಯನ್ನು ಭಾರತದ ಪುರುಷ ಸಮಾಜ ಹೊಂದಿರಬೇಕು. ಆಗ ಮಾತ್ರ ಸ್ತ್ರೀ ಸಮಾನತೆ, ಸ್ತ್ರೀ ಸಂವೇದನೆ, ಹೆಣ್ತನದ ಘನತೆ, ಲಿಂಗತ್ವ ಸಮಾನತೆ ಮುಂತಾದ ಉದಾತ್ತ ಪದಗಳು ಅರ್ಥಪೂರ್ಣವಾಗುತ್ತವೆ.

ಕೃಪೆ : The Politic

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending