ದಿನದ ಸುದ್ದಿ
ಸಿಸಿಸಿ ಗಳಲ್ಲಿ ಐಸೋಲೇಟ್ ಆಗುವಂತೆ ಸಲಹೆ : ಎಬಿಎಆರ್‍ಕೆ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಚಿಕಿತ್ಸೆ ಪಡೆಯಲು ಸಂಸದ ಜಿ.ಎಂ.ಸಿದ್ದೇಶ್ ಮನವಿ
ಸುದ್ದಿದಿನ,ದಾವಣಗೆರೆ : ಕೋವಿಡ್ ರೋಗಿಗಳು ಸರ್ಕಾರಿ ಆಸ್ಪತ್ರೆಯಿಂದ ರೆಫರೆನ್ಸ್ ಪಡೆದು ಎಬಿಎಆರ್‍ಕೆ ಯೋಜನೆಯಡಿ ಎಂಪಾನೆಲ್ ಆಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದ್ದು, ಕೋವಿಡ್ ಸೋಂಕಿತರು ಈ ಯೋಜನೆಯ ಉಪಯೋಗ ಪಡೆಯಬೇಕೆಂದು ಸಂಸದರಾದ ಜಿ.ಎಂ ಸಿದ್ದೇಶ್ವರ ಮನವಿ ಮಾಡಿದರು.
ಬುಧವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಕ್ಸಿಜನ್ ಪೂರೈಕೆ ಮತ್ತು ಬೆಡ್‍ಗಳು ಮತ್ತು ಲಸಿಕೆ ನಿರ್ವಹಣೆ ಕುರಿತು ಚರ್ಚಿಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ ವತಿಯಿಂದ ಸರ್ಕಾರ ಜಾರಿಗೊಳಿಸಿರುವ ಎಬಿಎಆರ್‍ಕೆ ಯೋಜನೆಯಡಿ ನೋಂದಾಯಿಸಲ್ಪಟ್ಟ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಜನ ಸಾಮಾನ್ಯರು ಪಡೆಯಬೇಕೆಂದರು.
ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಮತ್ತು ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಶೇ.75 ಬೆಡ್‍ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕೆಂಬ ನಿಯಮವಿದೆ. ಇದುವರೆಗೆ ಎಬಿಎಆರ್‍ಕೆ ಯಿಂದ ಖಾಸಗಿ ಆಸ್ಪತ್ರೆಗೆ ರೆಫರೆನ್ಸ್ ಪಡೆದು ಕೇವಲ 64 ಜನರು ಮಾತ್ರ ಉಚಿತ ಚಿಕಿತ್ಸೆಯ ಸದುಪಯೋಗ ಪಡೆದಿದ್ದಾರೆ.
ಇದನ್ನೂ ಓದಿ | ದಾವಣಗೆರೆ | ಸೋಂಕಿತರ ಮನೆಗಳಿಗೆ ಜಿ.ಪಂ ಸಿಇಓ ಭೇಟಿ-ಪರಿಶೀಲನೆ
ಸಿ.ಜಿ. ಆಸ್ಪತ್ರೆ ಹೊರತುಪಡಿಸಿ ಖಾಸಗಿಯಲ್ಲಿ 1535 ಬೆಡ್‍ಗಳು ರೋಗಿಗಳಿಗೆ ನಿಗದಿ ಆಗಿದ್ದು ಬಹಳಷ್ಟು ಜನರು ಈ ಯೋಜನೆಯ ಬಳಕೆ ಮಾಡುತ್ತಿಲ್ಲ. ಆದ ಕಾರಣ ಸೋಂಕಿತರು ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಯಲ್ಲಿ ರೆಫರೆನ್ಸ್ ಪಡೆದು ಖಾಸಗಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡಿದ ವೆಚ್ಚ ಭರಿಸುವುದು ಎಂದು ಮಾಹಿತಿ ನೀಡಿದರು.
ಎಬಿಎಆರ್‍ಕೆ ರೆಫರೆನ್ಸ್ ನೀಡಲು ತಂಡ
ಎಬಿಎಆರ್‍ಕೆ ಅಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ರೆಫರೆನ್ಸ್ ನೀಡಲು ಜಿಲ್ಲಾಸ್ಪತ್ರೆಯಲ್ಲಿ ಮೂರು ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರು ಸೇರಿದಂತೆ 8 ಜನರ ಹೆಲ್ಪ್‍ಡೆಸ್ಕ್ ತಂಡ ರಚಿಸಲಾಗಿದೆ. ಇವರನ್ನು ಭೇಟಿ ಮಾಡಿ ಖಾಸಗಿ ಆಸ್ಪತ್ರೆ ದಾಖಲಾತಿಗೆ ಮುನ್ನ ರೆಫರೆನ್ಸ್ ಪಡೆಯಬೇಕು ಎಂದರು.
ಸಿಸಿಸಿ ಐಸೊಲೇಷನ್ ಉತ್ತಮ
ಪ್ರತಿಷ್ಟಿತ ಬಡಾವಣೆಗಳಲ್ಲಿಯೇ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪ್ರತ್ಯೇಕ ಕೊಠಡಿ ಇತರೆ ವ್ಯವಸ್ಥೆ ಇದೆ ಎಂದು ಮನೆಯಲ್ಲಿಯೇ ಐಸೊಲೇಟ್ ಆಗುತ್ತಿದ್ದಾರೆ. ಆದರೆ ಸಮರ್ಪಕವಾಗಿ ಐಸೊಲೇಷನ್ ನಿಯಮ ಪಾಲಿಸದೇ ಮನೆಯವರೆಲ್ಲ ಪಾಸಿಟಿವ್ ಆಗುತ್ತಿರುವುದು ಕಂಡು ಬಂದಿದೆ.
ಆದ ಕಾರಣ ನಗರದ ತರಳಬಾಳು ಶ್ರೀಗಳು ಎಲ್ಲ ರೀತಿಯ ವ್ಯವಸ್ಥೆ ಇರುವ ತರಳಬಾಳು ಬಾಲಕಿಯರ ಹಾಸ್ಟೆಲ್‍ನ್ನು ಕೋವಿಡ್ ಆರೈಕೆ ಕೇಂದ್ರವಾಗಿಸಲು ನೀಡಿದ್ದು ಇಲ್ಲಿ 90 ಜನರಿಗೆ ಅವಕಾಶವಿದೆ. ಇಲ್ಲಿ ಐಸೋಲೇಟ್ ಆಗುವ ಮೂಲಕ ಕೋವಿಡ್ ಸರಪಳಿಯನ್ನು ತುಂಡರಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.
ಆಕ್ಸಿಜನ್ ಕೊರತೆ ನೀಗಿಸಲು ಪ್ರಾಮಾಣಿಕ ಪ್ರಯತ್ನ
ಪ್ರಸ್ತುತ ಜಿಲ್ಲೆಯಲ್ಲಿ ಸ್ವಲ್ಪ ಆಕ್ಸಿಜನ್ ಕೊರತೆ ಇರುವುದು ನಿಜ. ಪ್ರಸ್ತುತ 14 ಕೆ ಎಲ್ ಆಕ್ಸಿಜನ್ ಸರಬರಾಜಾಗುತ್ತಿದ್ದು 23 ಕೆಎಲ್‍ಗೆ ಒತ್ತಾಯ ಮಾಡಲಾಗುತ್ತಿದೆ. ಆಕ್ಸಿಜನ್ ಸಮಸ್ಯೆಯನ್ನು ಪರಿಹರಿಸಲು ಕೇಂದ್ರದ ಸಚಿವರು ಹಾಗೂ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಎಂದರು.
ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ತಮ್ಮಲ್ಲಿ ರೆಮಿಡಿಸಿವಿರ್ ಲಸಿಕೆ ಇಲ್ಲ. ಜಿಲ್ಲಾಧಿಕಾರಿಗಳ ಬಳಿ ಹೋಗಿ ಕೇಳಿದರೆ ನೀಡುತ್ತಾರೆಂದು ಕಳುಹಿಸಿದ್ದಾರೆ. ಹಾಗೂ ಆಕ್ಸಿಜನ್ ಇಲ್ಲ. ನೀವೇ ವ್ಯವಸ್ಥೆ ಮಾಡಿದರೆ ಚಿಕಿತ್ಸೆ ನೀಡುತ್ತೇವೆಂದು ರೋಗಿಗಳ ಕಡೆಯವರಿಗೇ ವ್ಯವಸ್ಥೆ ಮಾಡಲು ತಿಳಿಸಿರುವುದು ಗಮನಕ್ಕೆ ಬಂದಿದೆ. ಹೀಗೆ ರೋಗಿಗಳ ಬಳಿಯೇ ವ್ಯವಸ್ಥೆ ಮಾಡಿಸುವುದಾದರೆ ಖಾಸಗಿ ಆಸ್ಪತ್ರೆಗಳ ಪಾತ್ರವೇನು?
ಇನ್ನು ಮುಂದೆ ಈ ರೀತಿ ಮಾಡುವುದು ನನ್ನ ಗಮನಕ್ಕೆ ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ ಅವರು ಆ ರೀತಿಯ ಅವಶ್ಯಕತೆಗಳನ್ನು ಖುದ್ದಾಗಿ ಜಿಲ್ಲಾಧಿಕಾರಿಗಳು ಅಥವಾ ಜನಪ್ರತಿನಿಧಿಗಳ ಬಳಿ ಕೇಳಿ ಪರಿಹರಿಸಿಕೊಳ್ಳಬೇಕೆಂದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಖಾಸಗಿ ಆಸ್ಪತ್ರೆಯವರು ಈ ರೀತಿ ರೋಗಿಗಳ ಕಡೆಯಿಂದಲೇ ಔಷಧ ಮತ್ತೊಂದು ವ್ಯವಸ್ಥೆ ಮಾಡಿಕೊಡುವಂತೆ ಕೇಳಿದರೆ ಕೆಪಿಎಂಇ ಅಡಿಯಲ್ಲಿ ನೋಟಿಸ್ ನೀಡಿ ಸೇವೆಯನ್ನು ನಿಲಂಬನೆಗೊಳಿಸುವ ಕ್ರಮ ಜರುಗಿಸಲಾಗುವುದು. ಏನಾದರೂ ಕೊರತೆ ಇದ್ದರೆ ನನ್ನ ಬಳಿ ಚರ್ಚೆ ಮಾಡಬೇಕು. ಅದು ಬಿಟ್ಟು ರೋಗಿಗಳ ಕಡೆಯವರಿಗೆ ವ್ಯವಸ್ಥೆ ಮಾಡುವಂತೆ ತಿಳಿಸಬಾರದು ಎಂದು ತಾಕೀತು ಮಾಡಿದರು.
ಇಎಸ್‍ಐ ಆಸ್ಪತ್ರೆಯಲ್ಲಿ ವ್ಯವಸ್ಥೆ
ಇಎಸ್‍ಐ ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆಯನ್ನು ಮಾಡಲಾಗಿದ್ದು ಇಂದಿನಿಂದಲೇ ರೋಗಿಗಳನ್ನು ಅಲ್ಲಿಗೆ ಸ್ಥಳಾಂತರಿಸಬಹುದಾಗಿದೆ ಎಂದರು. ಹಾಗೂ ಸಿ ಜಿ ಆಸ್ಪತ್ರೆಯ ರೂಂ ಸಂಖ್ಯೆ 65 ಮತ್ತು 66 ರಲ್ಲಿ ಸ್ಟೆಪ್‍ಡೌನ್ ವಾರ್ಡ್ ಮಾಡಿ ಬೆಡ್‍ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಮುಂದೆ ಆಕ್ಸಿಜನ್ ಲಭ್ಯತೆ ಹೆಚ್ಚಾದಲ್ಲಿ ಬೆಡ್‍ಗಳ ಸಂಖ್ಯೆಯನ್ನು ಸಹ ಹೆಚ್ಚಿಸಲಾಗುವುದು ಎಂದರು.
ತಾಲ್ಲೂಕುಗಳಲ್ಲಿ ಸಿಸಿಸಿ ಬಳಕೆ ಮಾಡಿಕೊಳ್ಳಿರಿ
ತಾಲ್ಲೂಕುಗಳಲ್ಲಿನ ಕೋವಿಡ್ ಕೇರ್ ಸೆಂಟರ್‍ಗಳ ಬಳಕೆಯನ್ನು ಜನರು ಮಾಡಿಕೊಳ್ಳಬೇಕು. ಹೋಂ ಐಸೊಲೇಷನ್ ಸಮರ್ಪಕವಾಗಿ ಮಾಡಿಕೊಳ್ಳದಿದ್ದರೆ ಮನೆಯವರೆಲ್ಲಾ ಪಾಸಿಟಿವ್ ಆಗುತ್ತಾರೆ. ಆದ ಕಾರಣ ಸಿಸಿಸಿ ಬಳಕೆ ಮಾಡಿಕೊಳ್ಳಬೇಕು. ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಗ್ರಾಮದಲ್ಲಿ ಬಹಳಷ್ಟು ಜನರಿಗೆ ಕೋವಿಡ್ ಸೋಂಕು ತಗುಲಿದ್ದು ಕಂಟೈನ್‍ಮೆಂಟ್ ಝೋನ್ ಮಾಡಲಗಿದೆ. ಆದ ಕಾರಣ ಎಲ್ಲರೂ ಎಚ್ಚರಿಕೆಯಿಂದ ಇರಬೇಕು.
ಹಾಗೂ ಎಲ್ಲ ತಾಲ್ಲೂಕುಗಳಲ್ಲಿ 50 ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ ಇದ್ದು, ಗಂಭೀರವಾದ ರೋಗಿಗಳನ್ನು ಮಾತ್ರ ಜಿಲ್ಲಾಸ್ಪತ್ರೆಗೆ ಕಳುಹಿಸಬೇಕು ಎಂದರು.
ಜಿಲ್ಲಾಸ್ಪತ್ರೆಯಲ್ಲಿ 17 ಜನ ತಜ್ಞ ವೈದ್ಯರು ಮತ್ತು 30 ದಾದಿಯರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಅನಸ್ತೇಷಿಯಾ ಮತ್ತು ಪಲ್ಮನರಿ ವೈದ್ಯರ ಕೊರತೆ ಇದೆ. ಈ ಹುದ್ದೆಗಳಿಗೂ ಅರ್ಜಿ ಕರೆದಿದ್ದು ಹುದ್ದೆ ಭರ್ತಿಯಾದಲ್ಲಿ ಸಿಬ್ಬಂದಿ ಕೊರತೆಯಿಂದ ಚಾಲನೆಯಲ್ಲಿ ಇಲ್ಲದ ವೆಂಟಿಲೇಟರ್‍ಗಳನ್ನು ಚಾಲನೆಗೊಳಿಸಲಾಗುವುದು.
ಕಡಿಮೆ ಪಾಸಿಟಿವಿಟಿ ದರ ಪಟ್ಟಿಯಲ್ಲಿ ದಾವಣಗೆರೆ
ಕೇಂದ್ರ ಸರ್ಕಾರ ದೇಶದಲ್ಲಿ ಹೆಚ್ಚು ಪ್ರಕರಣ ಇರುವ 100 ಜಿಲ್ಲೆಗಳನ್ನು ಗುರುತಿಸಿದ್ದು ಅದರಲ್ಲಿ 17 ಜಿಲ್ಲೆ ನಮ್ಮ ರಾಜ್ಯ ಸೇರಿದ್ದವಾಗಿವೆ. ಹಾಗೂ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳ ಪಟ್ಟಿಯಲ್ಲಿ ದಾವಣಗೆರೆ ಇರುವುದು ಅಭಿನಂದನೀಯ. ಹೀಗೆಯೇ ಜಿಲ್ಲಾಡಳಿತದೊಂದಿಗೆ ಎಲ್ಲರೂ ಸಹಕರಿಸುವ ಮೂಲಕ ಕೋವಿಡ್ ಚೈನ್ ಬ್ರೇಕ್ ಮಾಡಬೇಕು ಎಂದರು.
ಸಭೆಯಲ್ಲಿ ಸುಕ್ಷೇಮ, ಸುಚೇತ, ಆರೈಕೆ, ಆಶ್ರಯ ಸೇರಿದಂತೆ ಕೋವಿಡ್ ಚಿಕಿತ್ಸೆ ನೀಡುವ ಆಸ್ಪತ್ರೆಯ ವೈದ್ಯರು ತಮ್ಮ ಆಸ್ಪತ್ರೆಗಳಲ್ಲಿ ಪ್ರಸ್ತುತ ಆಕ್ಸಿಜನ್ ಕೊರತೆ ಇದ್ದು, ತಮಗೆ ಇಂತಿಷ್ಟು ಆಕ್ಸಿಜನ್ ನೀಡಲಾಗುವುದು ಎಂದು ನಿಗದಿಗೊಳಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಇತ್ತೀಚೆಗೆ ಜಿಲ್ಲಾಸ್ಪತ್ರೆಯಲ್ಲಿ ಉಂಟಾದ ಆಕ್ಸಿಜನ್ ಕ್ರೈಸಿಸ್‍ನಿಂದ ಸ್ವಲ್ಪ ವ್ಯತ್ಯಯವಾಗಿದೆ. ಇನ್ನು ಮೂರು ನಾಲ್ಕು ದಿನಗಳಲ್ಲಿ ಇದು ಸರಿ ಹೋಗಲಿದ್ದು ಮುಂದಿನ ದಿನಗಳಲ್ಲಿ ಯಾವುದೇ ತೊಡಕಿಲ್ಲದೆ ನಿರಂತರ ಆಕ್ಸಿಜನ್ ಪೂರೈಕೆ ಮಾಡುವ ಭರವಸೆ ನೀಡಿದರು.
ಸಭೆಯಲ್ಲಿ ಮಹಾನಗರಪಾಲಿಕೆಯ ಮಹಾಪೌರರಾದ ಎಸ್.ಟಿ ವಿರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಡಿಸಿ ಪೂಜಾರ ವೀರಮಲ್ಲಪ್ಪ, ಜಿ.ಪಂ ಉಪ ಕಾರ್ಯದರ್ಶಿ ಆನಂದ್, ಡಿಹೆಚ್‍ಒ ಡಾ. ನಾಗರಾಜ್, ಡಿಎಸ್ ಡಾ.ಜಯಪ್ರಕಾಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಆರ್‍ಸಿಹೆಚ್‍ಒ ಡಾ.ಮೀನಾಕ್ಷಿ, ಡಾ.ಮುರಳೀಧರ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ16 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ1 day agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ13 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ1 day agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

