ದಿನದ ಸುದ್ದಿ
ಪೊಲೀಸ್ ಗೌರವದೊಂದಿಗೆ ನಾಡೋಜ ಚೆನ್ನವೀರ ಕಣವಿ ಅಂತ್ಯಕ್ರಿಯೆ : ಕೇಂದ್ರ ಹಾಗೂ ರಾಜ್ಯದ ಸಚಿವರಿಂದ ಅಂತಿಮ ದರ್ಶನ
ಸುದ್ದಿದಿನ,ಧಾರವಾಡ : ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಂದು (ಫೆ.16) ಬೆಳಿಗ್ಗೆ ನಿಧನರಾದರು. ಕಲ್ಯಾಣ ನಗರದ ನಿವಾಸ, ಕರ್ನಾಟಕ ಕಾಲೇಜು ಆವರಣದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ದರ್ಶನ ಏರ್ಪಡಿಸಲಾಗಿತ್ತು. ಸಂಜೆ ಕೆಲಗೇರಿ ಸಮೀಪದ “ಸೃಷ್ಠಿ” ತೋಟದಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಿತು. ಕೇಂದ್ರ ಹಾಗೂ ರಾಜ್ಯ ಸಚಿವರು, ಶಾಸಕರು, ಗಣ್ಯರು, ಸಾಹಿತಿಗಳು ಅಂತಿಮದರ್ಶನ ಪಡೆದು ಗೌರವ ಸಲ್ಲಿಸಿದರು.
ಬೆಳಿಗ್ಗೆ ಸುದ್ದಿ ತಿಳಿದ ಕೂಡಲೇ ಸತ್ತೂರಿನ ಎಸ್ಡಿಎಂ ಆಸ್ಪತ್ರೆಗೆ ಧಾವಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಡಾ.ಚೆನ್ನವೀರ ಕಣವಿ ಅವರ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಮತ್ತು ಅಂತ್ಯಕ್ರಿಯೆ ಕುರಿತು ನಿರ್ಧಾರ ಪ್ರಕಟಿಸಿದರು.
ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಡಾ.ಚೆನ್ನವೀರ ಕಣವಿ ಅವರ ಕಲ್ಯಾಣ ನಗರದ ಚೆಂಬೆಳಕು ನಿವಾಸಕ್ಕೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೊಗಲಾಯಿತು. ಗದುಗಿನ ತೋಂಟದ ಡಾ. ಸಿದ್ಧರಾಮ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಡಾ.ಕಣವಿ ಅವರ ಪುತ್ರರಾದ ಶಿವಾನಂದ, ಚಂದ್ರಮೌಳಿ, ಪ್ರಿಯದರ್ಶಿ, ಕರುಣಪ್ರಸಾದ ಹಾಗೂ ಪುತ್ರಿ ರಂಜನಾ ಗೋದಿ ತಮ್ಮ ಕುಟುಂಬದ ಸದಸ್ಯರು, ಬಂಧುಗಳೊಂದಿಗೆ ಪೂಜೆ ಸಲ್ಲಿಸಿದರು.
ಸಾರ್ವಜನಿಕರ ದರ್ಶನಕ್ಕಾಗಿ ಕರ್ನಾಟಕ ಕಾಲೇಜು ಮುಖ್ಯ ಕಟ್ಟಡದ ಆವರಣದಲ್ಲಿ ಮಧ್ಯಾಹ್ನ ಡಾ. ಕಣವಿ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ವಿವಿಧ ಮಠಾಧೀಶರು, ಕರ್ನಾಟಕ ವಿದ್ಯಾವರ್ಧಕ ಸಂಘ, ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕರ್ನಾಟಕ ಲೇಖಕಿಯರ ಸಂಘ, ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಘಟಕ, ವಿವಿಧ ಶಿಕ್ಷಣ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳು, ಸೇರಿದಂತೆ ಡಾ.ಚೆನ್ನವೀರ ಕಣವಿ ಅವರ ಆಪ್ತರು, ಅಭಿಮಾನಿಗಳು, ಶಿಷ್ಯರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ, ಕವಿವಿ ಕುಲಪತಿ ಡಾ.ಕೆ.ಬಿ.ಗುಡಸಿ, ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣತೋಂಟದಾರ್ಯ, ಮನಗುಂಡಿಯ ಬಸವಾನಂದ ಸ್ವಾಮೀಜಿ, ಭೈರನಟ್ಟಿಯ ಶಾಂತವೀರ ಸ್ವಾಮೀಜಿ, ಕರ್ನಾಟಕ ಕಲಾ ಕಾಲೇಜು ಪ್ರಾಚಾರ್ಯ ಡಾ.ಡಿ.ಬಿ.ಕರಡೋಣಿ, ವಿಜ್ಞಾನ ಕಾಲೇಜು ಪ್ರಾಚಾರ್ಯ ಡಾ. ಶಿವಾನಂದ ಚೌಗಲಾ ಸೇರಿದಂತೆ ಅನೇಕರು ಡಾ.ಕಣವಿ ಅವರಿಗೆ ಪುಷ್ಪಗುಚ್ಚ ಇರಿಸಿ ಅಂತಿಮ ನಮನ ಸಲ್ಲಿಸಿದರು.
ಸಂಜೆ ಹೊತ್ತಿಗೆ ಡಾ.ಕಣವಿ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಕರ್ನಾಟಕ ಕಾಲೇಜು ಆವರಣದಿಂದ ಕೆಲಗೇರಿ ಹತ್ತಿರದಲ್ಲಿರುವ ಅವರ ತೋಟಕ್ಕೆ ಸಾಗಿತು. ಬಸವತತ್ವ ಹಾಗೂ ವೀರಶೈವ ಲಿಂಗಾಯತ ಪರಂಪರೆಯ ಆಚರಣೆಗಳ ಮೂಲಕ ಅಂತ್ಯಸಂಸ್ಕಾರ ನಡೆಯಿತು.
ಕನ್ನಡದಲ್ಲಿ ಪೊಲೀಸ್ ಕವಾಯತ ಗೌರವ ಸಲ್ಲಿಕೆ
ನಾಡೋಜ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರಕ್ಕೆ ಗೌರವ ರಕ್ಷೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಅವರ ನೇತೃತ್ವದಲ್ಲಿ ನೀಡಲಾಯಿತು. ಕನ್ನಡದಲ್ಲಿ ಕವಾಯತು ಆಜ್ಞೆಗಳನ್ನು ನೀಡಿ ಪೊಲೀಸ್ ಗೌರವ ಸಲ್ಲಿಸಿ, ಗಾಲಿಯಲ್ಲಿ 3 ಸುತ್ತು ಕುಶಾಲತೋಪು ಸಿಡಿಸಿ ಗೌರವ ಅರ್ಪಿಸಲಾಯಿತು.
ಅಂತ್ಯಕ್ರಿಯೆ ಸ್ಥಳದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅವರು ನುಡಿನಮನ ಸಲ್ಲಿಸಿದರು.
ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ, ಕವಿವಿ ವಿಶ್ರಾಂತ ಕುಲಪತಿ ಪ್ರೊ ಎಚ್.ಬಿ.ವಾಲಿಕಾರ, ರಾಮಕೃಷ್ಣ ಆಶ್ರಮದ ವಿಜಯಾನಂದ ಸರಸ್ವತಿ ಸ್ವಾಮೀಜಿ, ಉನ್ನತ ಶಿಕ್ಷಣ ಅಕಾಡೆಮಿಯ ನಿರ್ದೇಶಕ ಪ್ರೊ. ಎಸ್.ಎಂ.ಶಿವಪ್ರಸಾದ, ಮಾಜಿ ಶಾಸಕ ಮೋಹನ ಲಿಂಬಿಕಾಯಿ, ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಜಿ.ಪಂ.ಸಿಇಓ ಡಾ.ಸುರೇಶ ಇಟ್ನಾಳ, ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ.ಬಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಉಪವಿಭಾಗಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ ಡಾ.ಸಂತೋಷಕುಮಾರ ಬಿರಾದಾರ, ಲೋಕೋಪಯೋಗ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಬಿ.ಚೌಡಣ್ಣವರ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ ಸೇರಿದಂತೆ ವಿವಿಧ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಸಾಹಿತಿಗಳು, ಸಂಘಟಕರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಗಣ್ಯರ ಅಭಿಪ್ರಾಯಗಳು
- ಚೆಂಬೆಳಕಿನ ಕವಿ, ಸಹೃದಯಿ, ಅಂತಃಕರಣದ ಮಾನವೀಯ ಮೌಲ್ಯಗಳಿಗೆ ಪ್ರಾಧಾನ್ಯತೆ ಕೊಟ್ಟ ಸ್ನೇಹಜೀವಿ. ಚೆನ್ನವೀರ ಕಣವಿ ಅವರು ವಿಶ್ವಭಾರತಿಗೆ ಕನ್ನಡದಾರುತಿ ಎಂಬ ಗೀತೆಯ ಮೂಲಕ ನಾಡು ಹಾಗೂ ದೇಶದ ಸಮಗ್ರತೆಯನ್ನು ಸಾರಿದ್ದಾರೆ. ಹಲವಾರು ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ. ಅವರಿಂದ ಪ್ರಶಸ್ತಿಗಳ ಮೌಲ್ಯ ಹೆಚ್ಚಾಗಿದೆ. ತಮಗಾಗಿ ಏನನ್ನೂ ಕೇಳಲಿಲ್ಲ. ಧಾರವಾಡದ ಅಭಿವೃದ್ಧಿ, ಮಾತೃ ಭಾಷೆ ಶಿಕ್ಷಣ ನೀತಿಗಳ ಬಗ್ಗೆ ಚರ್ಚಿಸುತ್ತಿದ್ದರು. ಅವರ ವಿಚಾರಗಳು ಅಜರಾಮರವಾಗಿರುತ್ತವೆ.
| ಪ್ರಲ್ಹಾದ್ ಜೋಶಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರು
- ಕಣವಿ ಅವರು ಕರ್ನಾಟಕದ ಹೆಮ್ಮೆಯ ಕವಿ, ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆ ಅಗಾಧವಾದದ್ದು, ಅವರ ಅಗಲಿಕೆಯು ಇಡೀ ರಾಜ್ಯಕ್ಕೆ ತುಂಬಲಾರದಂತಹ ನಷ್ಟವನ್ನುಂಟುಮಾಡಿದೆ. ಭರತ ಹುಣ್ಣಿಮೆ ದಿನ ಕವಿಯು ಬೆಳಕಿನಲ್ಲಿ ಲೀನವಾಗಿದ್ದಾರೆ. ರಾಷ್ಟ್ರಕವಿ ಬಿರುದಿನ ಬಗ್ಗೆ ಮುಖ್ಯಮಂತ್ರಿಯವರಲ್ಲಿ ಚರ್ಚಿಸುತ್ತೇನೆ ಎಂದರು.
| ಆಚಾರ ಹಾಲಪ್ಪ ಬಸಪ್ಪ, ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು
- ಚೆಂಬೆಳಕಿನ ಸಹೃದಯ ಕವಿಯ ಅಗಲಿಕೆ ತುಂಬಾ ನೋವುನ್ನುಂಟು ಮಾಡಿದೆ. ಅವರ ಕೊಡುಗೆ ಧಾರವಾಡಕ್ಕೆ ಅಷ್ಟೇ ಅಲ್ಲ ಇಡೀ ಕನ್ನಡ ನಾಡಿಗೆ ಮಹತ್ತರವಾದದ್ದು. ಕನ್ನಡ ತಾಯಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು. ಅಂತಹ ವ್ಯಕ್ತಿಯನ್ನು ಕಳೆದುಕೊಂಡಿದ್ದು ದುಃಖಕರ ಸಂಗತಿಯಾಗಿದೆ.
| ಅರವಿಂದ ಬೆಲ್ಲದ, ಶಾಸಕರು
- ಕನ್ನಡ ನಾಡು ಕಂಡ ಸಮನ್ವಯ ಕವಿ, ವಿದ್ವಾಂಸರಾದ ಚೆನ್ನವೀರ ಕಣವಿ ಅವರು ಇಡೀ ಕರ್ನಾಟಕದಾದ್ಯಂತ ಓದುಗರು, ಅಭಿಮಾನಿಗಳನ್ನು ಹೊಂದಿದ್ದರು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ.
| ನಿತೇಶ್ ಪಾಟೀಲ, ಜಿಲ್ಲಾಧಿಕಾರಿಗಳು, ಧಾರವಾಡ
- ಕಣವಿ ಅವರು ನಮಗೆ ದೊಡ್ಡ ಆದರ್ಶ ವ್ಯಕ್ತಿ. ಸಮನ್ವಯದ ಪ್ರತಿಪಾದಕರು. ವಯಸ್ಸಾದ ನಂತರ ಅವರ ಮಾತಿನಲ್ಲಿ ತೊದಲುವಿಕೆ ಇತ್ತೇ ಹೊರತು ಬರವಣಿಗೆಗೆ ತೊಡಕು ಇರಲಿಲ್ಲ. ಬೇಂದ್ರೆ ಅವರ ನಂತರ ಭಾಷಿಕವಾಗಿ, ಸಾಂಸ್ಕøತಿಕವಾಗಿ ಧಾರವಾಡವನ್ನು ಪ್ರತಿನಿಧಿಸಿದರು. ಮಹತ್ವದ ಕವಿಯನ್ನು ಕಳೆದುಕೊಂಡ ಧಾರವಾಡ ಸಾಂಸ್ಕøತಿಕವಾಗಿ ಬರಿದಾಗುತ್ತಿದೆ. ಕರ್ನಾಟಕ ಅಷ್ಟೇ ಅಲ್ಲ ರಾಷ್ಟ್ರದಲ್ಲೂ ಧಾರವಾಡದ ಹಿರಿಮೆಯನ್ನು ಹೆಚ್ಚಿಸಿದವರು. ಅವರ ಸ್ವಭಾವದಂತೆ ಶಾಂತವಾಗಿಯೇ ಕವಿತೆಗಳನ್ನು ಬರೆಯುತ್ತಿದ್ದರು. ಕಣವಿ ಅವರ ಜೊತೆಯ ಒಡನಾಟ ಸದಾ ಸ್ಮರಣೆಯಲ್ಲಿರುತ್ತದೆ.
| ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ, ಹಿರಿಯ ಸಾಹಿತಿ
- ಚೆನ್ನವೀರ ಕಣವಿ ಅವರು ಮುರುಘಾಮಠದ ಉತ್ತಮ ವಿದ್ಯಾರ್ಥಿ. ಧಾರವಾಡ ಮುರುಘಾಮಠದಲ್ಲಿ ತಯಾರಾಗಿ ಚೊಕ್ಕ ಚಿನ್ನವಾಗಿ ಹೊರಹೊಮ್ಮಿದ ವ್ಯಕ್ತಿ. ಅವರ ನಿಧನ ನಮಗೆ ತುಂಬಾ ಕಳವಳವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಆ ದೇವರು ಕರುಣಿಸಲಿ.
| ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಮುರಘಾಮಠ, ಧಾರವಾಡ
- ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಸಾರಾಂಗ ವಿಭಾಗ ಆರಂಭಿಸಲು ಕಾರಣೀಭೂತರಾದ ಚೆನ್ನವೀರ ಕಣವಿ ಅವರ ಕೊಡುಗೆ ಅಪಾರ. ಕವಿವಿಯ ಎಲ್ಲ ಪ್ರಕಟಣೆಗಳು ಜನರನ್ನು ಮುಟ್ಟುತ್ತಿವೆ ಎಂದರೆ ಅದಕ್ಕೆ ಚೆನ್ನವೀರ ಕಣವಿ ಅವರೇ ಕಾರಣ.
| ಪ್ರೊ. ಕೆ.ಬಿ.ಗುಡಸಿ, ಕುಲಪತಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ
- ಧರೆಯಿಂದ ಮರೆಯಾದಂತಹ ಕವಿ. ವಿಶ್ವಭಾರತಿಗೆ ಕನ್ನಡದ ಆರತಿಯನ್ನು ಬೆಳಗಿಸಿದಂತಹ ಕವಿ. ಕಣವಿ ಅವರ ನೆನಪು ಸದಾ ಜನಮನದಲ್ಲಿರುತ್ತದೆ. ಅವರ ಸಜ್ಜನಿಕೆ, ಸೌಜನ್ಯ, ತಾಳ್ಮೆಯ ಗುಣಗಳು ಮಾದರಿಯಾದವು.
| ಡಾ.ಮಹೇಶ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.
ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.
ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.
ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ1 day agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

