ದಿನದ ಸುದ್ದಿ
ಬಲಿಷ್ಠ ಸಾರ್ವಜನಿಕ ಉದ್ದಿಮೆಗಳು ಮಾತ್ರ ಖಾಸಗಿ ಕಂಪೆನಿಗಳ ಶೋಷಣೆ ತಡೆಯಬಲ್ಲವು : ಎಐಟಿಯುಸಿ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ ನಾಯರಿ
ಸುದ್ದಿದಿನ, ದಾವಣಗೆರೆ : ಕೇಂದ್ರ ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ಧೋರಣೆ ಹಾಗೂ ಬ್ಯಾಂಕ್ ಖಾಸಗೀಕರಣದ ಪ್ರಸ್ತಾಪವನ್ನು ವಿರೋಧಿಸಿ ಮತ್ತು ಬ್ಯಾಂಕ್‌ಗಳಲ್ಲಿ ಸಾಕಷ್ಟು ನೇಮಕಾತಿ ಮಾಡಲು, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಕ್ರಮ ಕೈಗೊಳ್ಳಲು ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ವಿರೋದಿಸಿ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ, ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳ ಸಂಘಟನೆಗಳು, ನೆರಳು ಬೀಡಿ ಕಾರ್ಮಿಕರ ಸಂಘಟನೆ, ಆಂಜನೇಯ ಕಾಟನ್ ಮಿಲ್ ಎಂಪ್ಲಾಯೀಸ್ ಯೂನಿಯನ್, ಸಾಮಿಲ್ ನೌಕರರ ಸಂಘ, ಮುದ್ರಣ ವಲಯದ ನೌಕರರ ಸಂಘಟನೆ ಹಾಗೂ ಇನ್ನಿತರ ಸಂಘಟನೆಗಳು ಇಂದು ಎರಡನೇ ದಿನವೂ ಮುಷ್ಕರ ನಡೆಸಿದರು.
ಎರಡನೇ ದಿನದ ಮುಷ್ಕರದ ಅಂಗವಾಗಿ ಇಂದು ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಕಾರ್ಮಿಕರ ಮೆರವಣಿಗೆ, ಮತ ಪ್ರದರ್ಶನ ಹಾಗೂ ಜಯದೇವ ವೃತ್ತದಲ್ಲಿ ಬಹಿರಂಗ ಸಭೆಯನ್ನು ನಡೆಸಲಾಯಿತು.
- ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಹೊತ್ತಿನಲ್ಲೂ ಕಾರ್ಮಿಕರ ಶೋಷಣೆ ನಡೆಯುತ್ತಿದೆ.
| ಹೆಚ್.ಜಿ.ಉಮೇಶ್ ಅವರಗೆರೆ
- ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ದೇಶದ ಆಸ್ತಿಯನ್ನು ಉಳಿಸಿಕೊಳ್ಳಲು ಈ ಹೋರಾಟ.
| ಕೈದಾಳೆ ಮಂಜುನಾಥ್,ಎಐಯುಟಿಯುಸಿ AIUTUC
ದಾವಣಗೆರೆ ಜಿಲ್ಲಾ ಜೆಸಿಟಿಯು ಮತ್ತು ಎಐಟಿಯುಸಿ ಅಧ್ಯಕ್ಷ ಕೆ.ರಾಘವೇಂದ್ರ ನಾಯರಿ ಮಾತನಾಡಿ ದೇಶವನ್ನು ಉಳಿಸಿ-ಕಾರ್ಮಿಕರನ್ನು ರಕ್ಷಿಸಿ ಎನ್ನುವ ಘೋಷಣೆಯೊಂದಿಗೆ ದೇಶಾದ್ಯಂತ ಸುಮಾರು 25 ಕೋಟಿ ಕಾರ್ಮಿಕರು ಎರಡು ದಿನಗಳ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಮಾಡುತ್ತಿದ್ದಾರೆ.
ದೇಶದ ಆಸ್ತಿಗಳಾದ ಬ್ಯಾಂಕುಗಳು, ವಿಮಾ ಕಂಪೆನಿಗಳು, ರೈಲ್ವೆ, ವಿದ್ಯುತ್ ಪ್ರಸರಣ ಸಂಸ್ಥೆಗಳು, ಟೆಲಿಕಾಂ, ಮೂಲಸೌಕರ್ಯ ಮುಂತಾದ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಮತ್ತು ರಾಷ್ಟ್ರೀಯ ಹಣಗಳಿಕೆಯ ಪೈಪ್‌ಲೈನ್ (NMP) ಅನ್ನು ರದ್ದುಗೊಳಿಸಬೇಕು. ರೈಲ್ವೇ, ವಿದ್ಯುತ್ ಪ್ರಸರಣ ವ್ಯವಸ್ಥೆಗಳು, ಟೆಲಿಕಾಂ ಮೂಲಸೌಕರ್ಯ ಮುಂತಾದ ವಿವಿಧ ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ ಭೂಮಿಯೂ ಸಹ ದೇಶದ ಅಮೂಲ್ಯ ಆಸ್ತಿಯಾಗಿದೆ.
ಇವುಗಳನ್ನು ಖಾಸಗಿ ಬಂಡವಾಳಷಾಹಿಗಳಿಗೆ ಮಾರುವ, ಬಂಡವಾಳ ಹಿಂತೆಗೆತ ಮಾಡುವ, ದೀರ್ಘಕಾಲದ ಅವಧಿಗೆ ಖಾಸಗಿಯವರಿಗೆ ಲೀಸ್‌ಗೆ ನೀಡುವ ಹುನ್ನಾರ ನಡೆಯುತ್ತಿದೆ. ಇದು ದೇಶದ ಭವಿಷ್ಯದ ಹಿತ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ.
ಉದ್ಯೋಗ ನಷ್ಟ ಮಾಡುವ ಹಾಗೂ ಸಾಮಾಜಿಕ ನ್ಯಾಯ ನೀಡುವ ಮೀಸಲಾತಿ ಸೌಲಭ್ಯಗಳನ್ನು ಕಳೆಯುವ ಈ ಖಾಸಗಿಕರಣ ಪ್ರಕ್ರಿಯೆಯನ್ನು ಹಿಮ್ಮೆಟ್ಟಿಸುವುದಕ್ಕಾಗಿ ಈ ಮುಷ್ಕರವನ್ನು ನಡೆಸುತ್ತಿದ್ದೇವೆ. ಬಲಿಷ್ಠವಾದ ಸಾರ್ವಜನಿಕ ಉದ್ದಿಮೆಗಳು ಮಾತ್ರ ಖಾಸಗಿ ಕಂಪೆನಿಗಳ ಶೋಷಣೆ ತಡೆಯಬಲ್ಲವು ಎಂದು ಕೆ.ರಾಘವೇಂದ್ರ ನಾಯರಿ ತಿಳಿಸದರು.
ಜಿಲ್ಲಾ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಹೆಚ್.ಜಿ.ಉಮೇಶ್ ಅವರಗೆರೆ ಮಾತನಾಡಿ ದೇಶದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಹೊತ್ತಿನಲ್ಲೂ ಕಾರ್ಮಿಕರ ಶೋಷಣೆ ಅವ್ಯಾಹತವಾಗಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ನೇತೃತ್ವದ ಸರ್ಕಾರವು ಇದನ್ನು ‘ಅಮೃತ ಕಾಲ’ದ ಆರಂಭ ಎಂದು ಹೇಳಿಕೊಳ್ಳುತ್ತಿದ್ದಾರೆ.
ದೇಶದ ಜನ ನೆಮ್ಮದಿಯಿಂದ ಇದ್ದಾರೆ ಎಂದು ಕೇಂದ್ರ ಸರಕಾರ ಪ್ರಚಾರ ಮಾಡುತ್ತಿದೆ. ಆದರೆ, ದೇಶದ ಶ್ರಮಿಕ ಜನ ಸಂಕಷ್ಟಗಳ ಮೇಲೆ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹೆಚ್ಚುತ್ತಿರುವ ನಿರುದ್ಯೋಗ, ಮುಳುಗುತ್ತಿರುವ ಆದಾಯ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಮಹಿಳೆಯರಿಗೆ ಸುರಕ್ಷಿತೆ, ಭದ್ರತೆ ಇಲ್ಲದ ಸಂಕಷ್ಟದ ಸಮಯವಾಗಿದೆ. ಈ ಎಲ್ಲಾ ಸಂಕಷ್ಟಗಳು ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದ ಸೃಷ್ಟಿಯಾಗಿವೆ ಎಂದರು.
ಎಐಯುಟಿಯುಸಿ ಮುಖಂಡ ಕೈದಾಳೆ ಮಂಜುನಾಥ್ ಮಾತನಾಡಿ ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ, ದೇಶದ ಆಸ್ತಿಗಳನ್ನು ಉಳಿಸಿಕೊಳ್ಳುವುದಕ್ಕಾ ಈ ಹೋರಾಟ ನಡೆಯುತ್ತಿದೆ. ಜನಪರ ಹೋರಾಟಗಳು ಸರಕಾರವು ಜನರಿಗೆ ಮಾಡುತ್ತಿರುವ ದ್ರೋಹಗಳನ್ನು ತಡೆಯಲು ಯಶಸ್ವಿಯಾಗಿವೆ.
ಒಂದು ವರ್ಷಕ್ಕೂ ಹೆಚ್ಚು ಸುದೀರ್ಘ ಕಾಲ ರೈತರು ನಡೆಸಿದ ಹೋರಾಟದಿಂದ ರೈತ ವಿರೋಧಿ ಕೃಷಿ ಕಾಯಿದೆಗಳನ್ನು ಹಿಂಪಡೆಯುವ ನಿರ್ಧಾರವನ್ನು ಕೇಂದ್ರ ಸರಕಾರ ತೆಗೆದುಕೊಂಡಿತ್ತು. ಆದಾಗ್ಯೂ ಕೇಂದ್ರ ಸರಕಾರ ತನ್ನ ಹಠಮಾರಿ ಧೋರಣೆಗಳಿಂದಾಗಿ ದೇಶದ ಸಂಪತ್ತನ್ನು ಮಾರಾಟ ಮಾಡುತ್ತಿದೆ. ಖಾಸಗೀಕರಣವನ್ನು ಬಲಗೊಳಿಸುವ ಪ್ರಕ್ರಿಯೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ. ಸರಕಾರದ ಈ ನೀತಿಗಳು ದೇಶವನ್ನು ದುರ್ಬಲಗೊಳಿಸುವುದಾಗಿದೆ. ಹಾಗಾಗಿ ಎರಡು ದಿನಗಳ ಕಾಲ ಮುಷ್ಕರ ನಡೆಸುತ್ತಿದ್ದೇವೆ ಎಂದರು.
ಎಐಟಿಯುಸಿ ಮುಖಂಡ ಅವರಗೆರೆ ಚಂದ್ರು ಮಾತನಾಡಿ ಅಂಗನವಾಡಿ, ಆಶಾ, ಮಧ್ಯಾಹ್ನದ ಬಿಸಿಯೂಟ ಮತ್ತು ಇತರ ಯೋಜನಾ ಕಾರ್ಯಕರ್ತರಿಗೆ ಶಾಸನಬದ್ಧ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಸರಕಾರವನ್ನು ಒತ್ತಾಯಿಸಿದರು. 60 ಲಕ್ಷಕ್ಕೂ ಹೆಚ್ಚು ‘ಸ್ಕೀಮ್ ವರ್ಕರ್‌ಗಳು’ ಮಹಿಳೆಯರಾಗಿದ್ದಾರೆ.
ಅವರು ವಿವಿಧ ಸರ್ಕಾರಿ ಯೋಜನೆಗಳಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಸೇವೆಗಳು, ಮಕ್ಕಳ ಆರೈಕೆ ಸೇವೆಗಳು ಇತ್ಯಾದಿಗಳನ್ನು ಒದಗಿಸುವಂತಹ ನಿರ್ಣಾಯಕ ಕೆಲಸಗಳನ್ನು ಮಾಡುತ್ತಿದ್ದಾರೆ. ಸಾಂಕ್ರಾಮಿಕ ಸಮಯದಲ್ಲಿಯೂ ಅವರು ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರೂ ಅವರೆಲ್ಲರನ್ನು ‘ಸ್ವಯಂಸೇವಕ ಕೆಲಸಗಾರರು’ ಎಂದು ವರ್ಗೀಕರಿಸಲಾಗಿದೆ ಮತ್ತು ಅತ್ಯಂತ ಕಡಿಮೆ ಗೌರವ ಧನವನ್ನು ನೀಡಲಾಗುತ್ತಿದೆ. ಅವರನ್ನು ಕಾಯಂಗೊಳಿಸಬೇಕು ಮತ್ತು ಎಲ್ಲಾ ಶಾಸನಬದ್ಧ ಹಕ್ಕುಗಳೊಂದಿಗೆ ಕಾರ್ಮಿಕರಂತೆ ಪರಿಗಣಿಸಬೇಕು ಎಂದವರು ಆಗ್ರಹಿಸಿದರು.
ಮುಷ್ಕರನಿರತ ಕಾರ್ಮಿಕರನ್ನು ಉದ್ದೇಶಿಸಿ ಮುಖಂಡರಾದ ಬಿ.ಆನಂದಮೂರ್ತಿ, ಜಬೀನಾ ಖಾನಂ, ಕರಿಬಸಪ್ಪ, ಶ್ರೀಹರ್ಷ, ಕೆ.ಪಿ.ಮಧುಸೂದನ್, ಅವರಗೆರೆ ವಾಸು, ರಾಜೇಂದ್ರ ಬಂಗೇರ ಮತ್ತಿತರರು ಮಾತನಾಡಿದರು.
ಇಂದಿನ ಮುಷ್ಕರದಲ್ಲಿ ಜೆಸಿಟಿಯು ನಾಯಕರುಗಳಾದ ಕೆ.ರಾಘವೇಂದ್ರ ನಾಯರಿ, ಹೆಚ್.ಜಿ.ಉಮೇಶ್ ಅವರಗೆರೆ, ಕೈದಾಳೆ ಮಂಜುನಾಥ್, ಅವರಗೆರೆ ಚಂದ್ರು, ಆನಂದ್ ರಾಜ್, ಬಿ.ಆನಂದಮೂರ್ತಿ, ವಿಶ್ವನಾಥ್ ಬಿಲ್ಲವ, ಜಬೀನಾ ಖಾನಂ, ಎಂ.ಬಿ.ಶಾರದಮ್ಮ, ಸುನೀತ್ ಕುಮಾರ್, ಎಸ್.ನಾಗರಾಜ್, ಸರೋಜಮ್ಮ, ಕರಿಬಸಪ್ಪ, ಹೆಚ್.ಎಸ್.ತಿಪ್ಪೇಸ್ವಾಮಿ, ಐರಣಿ ಚಂದ್ರು, ರಾಜೇಂದ್ರ ಬಂಗೇರ, ಆರ್.ಆಂಜನೇಯ, ಮಲ್ಲಮ್ಮ, ಕಾಳಮ್ಮ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


