ದಿನದ ಸುದ್ದಿ
ನಗದುರಹಿತ ವಹಿವಾಟಿಗೆ ಆದ್ಯತೆ ನೀಡುವಂತೆ ಮನ್ ಕಿ ಬಾತ್‌ನಲ್ಲಿ ಯುವ ಪೀಳಿಗೆಗೆ ಪ್ರಧಾನಿ ಕರೆ
ಸುದ್ದಿದಿನ ಡೆಸ್ಕ್ : ಭಾರತದಲ್ಲಿ ಡಿಜಿಟಲ್ ಪಾವತಿಯತ್ತ ಜನರು ಒಲವು ತೋರುತ್ತಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ.
ಆಕಾಶವಾಣಿಯ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಯುಪಿಐ ಬಹುಬೇಗ ದೇಶದ ಆರ್ಥಿಕತೆಯ ಭಾಗವಾಗಿದೆ. ಮೂಲೆಮೂಲೆಯ ಹಳ್ಳಿಗಳು ಹಾಗೂ ಸಣ್ಣ ಪಟ್ಟಣಗಳ ಜನರು ಯುಪಿಐ ಮೂಲಕ ವ್ಯವಹರಿಸುತ್ತಿದ್ದು ಪ್ರತಿದಿನ ದೇಶದಲ್ಲಿ 20 ಸಾವಿರ ಕೋಟಿ ರೂಪಾಯಿ ಮೌಲ್ಯದ ವಹಿವಾಟು ಡಿಜಿಟಲ್ ರೂಪದಲ್ಲಿ ನಡೆಯುತ್ತಿದೆ.
ಮಾರ್ಚ್ ತಿಂಗಳಲ್ಲಿ ಯುಪಿಐ ವಹಿವಾಟು 10 ಲಕ್ಷ ಕೋಟಿ ರೂಪಾಯಿ ಗಡಿ ತಲುಪಿತ್ತು ಎಂದು ಹೇಳಿದರು. ಯುವಜನತೆ ನಗದುರಹಿತ ವಹಿವಾಟಿಗೆ ಆದ್ಯತೆ ನೀಡುವಂತೆ ಅವರು ಸಲಹೆ ನೀಡಿದರು.
ಫಿನ್ ಟೆನ್ ಸಂಬಂಧಿತ ಅನೇಕ ಹೊಸ ಸ್ಟಾರ್ಟ್ ಅಪ್ ಗಳು ಕೂಡ ದೇಶದಲ್ಲಿ ಕಾರ್ಯಾರಂಭ ಮಾಡಿವೆ. ದೆಹಲಿಯಲ್ಲಿ ಒಂದು ದಿನ ನಗದು ಬಳಸದೇ ಇಡೀ ದಿನದ ಖರ್ಚನ್ನು ಡಿಜಿಟಲ್ ಪಾವತಿ ಮೂಲವೇ ಮಾಡಿದ ಸಾಗರಿಕ ಮತ್ತು ಪ್ರೇಕ್ಷಾ ಅವರ ಪ್ರಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಉದಾಹರಣೆ ನೀಡಿದರು.
ಗಜಿಯಾಬಾದ್‌ನ ಆನಂದಿತಾ ತ್ರಿಪಾಠಿ ಈಶಾನ್ಯ ಭಾರತದ ಮೂಲೆ ಮೂಲೆಗಳಲ್ಲೂ ಡಿಜಿಟಲ್ ಸೌಲಭ್ಯ ಪಡೆದ ಬಗ್ಗೆ ಪತ್ರ ಬರೆದು ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿಯೂ ಅವರು ಹೇಳಿದರು.
ತಂತ್ರಜ್ಞಾನದಿಂದ ಸಾಮಾನ್ಯ ಜನರ ಜೀವನದಲ್ಲೂ ಸುಧಾರಣೆ ಸಾಧ್ಯವಾಗುತ್ತಿದೆ ಎಂದು ಹೇಳಿದ ಅವರು, ದಿವ್ಯಾಂಗರಿಗೆ ತಂತ್ರಜ್ಞಾನ ವರದಾನವಾಗಿ ಪರಿಣಮಿಸಿದ್ದು ಅವರು ಹೊಸ ಎತ್ತರಕ್ಕೆ ಏರಲು ನೆರವಾಗಿದೆ ಎಂದರು.
ದಿವ್ಯಾಂಗರಿಗೆ ಸಂಪನ್ಮೂಲಗಳು ಮತ್ತು ಮೂಲಸೌಕರ್ಯ ಸುಲಭವಾಗಿ ಸಿಗುವಂತಾಗಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಅನೇಕ ಸ್ಟಾರ್ಟ್ ಅಪ್ ಗಳು ಮತ್ತು ಸಂಸ್ಥೆಗಳು ಈ ನಿಟ್ಟಿನಲ್ಲಿ ಪ್ರೇರಣಾದಾಯಕ ಕೆಲಸಗಳನ್ನು ಮಾಡುತ್ತಿವೆ. ದಿವ್ಯಾಂಗ ಕ್ರೀಡಾಪಟುಗಳಿಗೆ ಇನ್ನಷ್ಟು ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.
ಜಲಸಂರಕ್ಷಣೆಯ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನೀರಿನ ಲಭ್ಯತೆ ಅಥವಾ ಅಭಾವದಿಂದ ದೇಶದ ಪ್ರಗತಿ ಮತ್ತು ಗತಿಯನ್ನು ನಿರ್ಧರಿಸಲಾಗುತ್ತದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲೂ 75ಅಮೃತ ಸರೋವರನ್ನು ನಿರ್ಮಿಸಲು ಸೂಚಿಸಲಾಗಿದೆ ಎಂದರು.
ನೀರು ಜೀವನಾಧಾರ ಮತ್ತು ಅತಿದೊಡ್ಡ ಸಂಪನ್ಮೂಲ ಎಂಬ ಬಗ್ಗೆ ಶಾಸನಗಳ ಉಲ್ಲೇಖ ನೀಡಿ, ವೇದ-ಪುರಾಣಗಳಲ್ಲಿ ಜಲಸಂರಕ್ಷಣೆ ಮತ್ತು ಕೆರೆಗಳ ನಿರ್ಮಾಣವನ್ನು ಸಾಮಾಜಿಕ ಮತ್ತು ಆಧ್ಯಾತ್ಮಿಕ ಕರ್ತವ್ಯ ಎಂಬುದಾಗಿ ವಿವರಿಸಲಾಗಿದೆ ಎಂದು ಅವರು ಹೇಳಿದರು.
ವಾಲ್ಮೀಕಿ ರಾಮಾಯಣದಲ್ಲಿ ಜಲಸಂರಕ್ಷಣೆಗೆ ಮತ್ತು ನೀರಿನ ಮೂಲಗಳನ್ನು ಸಂಪರ್ಕಿಸಲು ವಿಶೇಷ ಒತ್ತು ನೀಡಲಾಗಿತ್ತು. ಇಂಡಸ್-ಸರಸ್ವತಿ, ಹರಪ್ಪ ನಾಗರಿಕತೆಯ ಕಾಲಘಟ್ಟದಲ್ಲೂ ಅಂತರ್ ಸಂಪರ್ಕಿತ ನೀರಿನ ವ್ಯವಸ್ಥೆ ಇತ್ತು ಎಂದು ಅವರು ತಿಳಿಸಿದರು.
ದೇಶದ ಹೊಸ ಪ್ರಧಾನಮಂತ್ರಿ ಸಂಗ್ರಹಾಲಯ ಜನರಲ್ಲಿ ಕುತೂಹಲ ತರಿಸಿದ್ದು ಅನೇಕ ತಿಳಿಯದ ವಿಚಾರಗಳನ್ನು ಅರಿತ ಬಗ್ಗೆ ಬಂದ ಪತ್ರಗಳೇ ಇದ್ದಕ್ಕೆ ಸಾಕ್ಷಿ ಎಂದು ಪ್ರಧಾನಿ ಹೇಳಿದರು.
ಈ ಸಂಗ್ರಹಾಲಯದ ಬಗೆಗಿನ ರಸಪ್ರಶ್ನೆಗೆ ನಮೋ ಆಪ್ ಅಥವಾ ಹ್ಯಾಷ್ ಟ್ಯಾಗ್ ಮ್ಯೂಸಿಯಂ ಕ್ವಿಜ್ ಮೂಲಕ ಉತ್ತರ ಹಂಚಿಕೊಳ್ಳುವಂತೆ ಅವರು ಸಲಹೆ ನೀಡಿದರು. ಮೇ ೧೮ ರಂದು ಅಂತಾರಾಷ್ಟ್ರೀಯ ಸಂಗ್ರಹಾಲಯ ದಿನ ಆಚರಿಸಲಾಗುತ್ತದೆ. ಜನರು ಸ್ಥಳೀಯ ಮ್ಯೂಸಿಯಂಗಳಿಗೆ ಭೇಟಿ ನೀಡಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಪ್ರಧಾನಿ ಕೋರಿದರು.
ಗಣಿತದ ಬಗ್ಗೆಯೂ ಮನ್ ಕಿ ಬಾತ್ ನಲ್ಲಿ ಅವರು ಪ್ರಸ್ತಾಪಿಸಿದರು. ಕೋಲ್ಕತಾದ ಗೌರವ್ ಟೆಕರೀವಾಲ್ ಅವರೊಂದಿಗೆ ಮಾತನಾಡಿದರು. ವೈದಿಕ ಗಣಿತದ ಕೀರ್ತಿ ಭಾರತಿ ಕೃಷ್ಣ ತೀರ್ಥ ಮಹಾರಾಜ್ ಅವರಿಗೆ ಸಲ್ಲುತ್ತದೆ ಎಂದು ಗೌರವ್ ತಿಳಿಸಿದರು.
ಭಾರತಿಕೃಷ್ಣ ತೀರ್ಥ ಮಹಾರಾಜ್ ನೀಡಿದ16ಸೂತ್ರಗಳ ಮೂಲಕ ಕ್ಲಿಷ್ಟಕರ ಗಣಿತ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಹೇಳಿದರು.
ಮುಂಬರುವ ಈದ್, ಅಕ್ಷಯ ತದಿಗೆ, ಪರಶುರಾಮ ಜಯಂತಿ, ಬುದ್ಧ ಪೂರ್ಣಿಮಾ ಪ್ರಯುಕ್ತ ಪ್ರಧಾನಿ ಜೊತೆಗೆ ಶುಭ ಕೋರಿದರು.
In the run-up to today’s #MannKiBaat, particularly in the last one week, I’ve been getting many letters that illustrate the great enthusiasm towards the Pradhanmantri Sangrahalaya.
I’d urge everyone to go visit the museum in the coming days! pic.twitter.com/O4hjcOmJdk
— Narendra Modi (@narendramodi) April 24, 2022
Summer vacations are here and why not spend some time visiting a local museum! Share your #MuseumMemories on social media so that others can also know more about our rich and diverse culture. #MannKiBaat pic.twitter.com/PGxRIV33GH
— Narendra Modi (@narendramodi) April 24, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


