ದಿನದ ಸುದ್ದಿ
ಈವರೆಗಿನ ಪ್ರಮುಖ ಸುದ್ದಿಗಳು
ಈವರೆಗಿನ ಪ್ರಮುಖ ಸುದ್ದಿಗಳು
- ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸುವವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜೊತೆಗೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.
- ಚಾಮರಾಜನಗರ ಜಿಲ್ಲೆಯಲ್ಲಿ ಇಂಧನ ಇಲಾಖೆ ಪರಿವರ್ತಕ ಕೇಂದ್ರಗಳ ನಿರ್ವಹಣೆ ಅಭಿಯಾನ ಆರಂಭವಾಗಿದೆ. ಮೇ 5ರಿಂದ ಆರಂಭಗೊಂಡಿರುವ ಅಭಿಯಾನ 15ರವರೆಗೆ ನಡೆಯಲಿದೆ ಎಂದು ಮೈಸೂರು ವಲಯದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಮುಖ್ಯ ಅಭಿಯಂತರ ಉಮೇಶ್ ಚಂದ್ರ ತಿಳಿಸಿದ್ದಾರೆ.
- ದೇಶ ಸ್ವಾತಂತ್ರ್ಯ ಹೊಂದುವ ಮೊದಲು, ನಂತರ ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ಬದಲಾವಣೆಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರು ವಹಿಸಿದ್ದ ಪಾತ್ರ ಮಹತ್ವದ್ದಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
- ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿಯನ್ನು ಹೊಂದಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ದಾವಣಗೆರೆಯಲ್ಲಿಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
- ಭಾರತ ತನ್ನೆಲ್ಲಾ ಸಾಮರ್ಥ್ಯದೊಂದಿಗೆ ಪ್ರಗತಿಯತ್ತ ಸಾಗುತ್ತಿರುವುದು ಹಾಗೂ ಜಗತ್ತಿನ ಕಲ್ಯಾಣದ ಉದ್ದೇಶದೊಂದಿಗೆ ಮುಂದುವರಿಯುತ್ತಿರುವ ಬಗ್ಗೆ ವಿಶ್ವದ ಪ್ರತಿಯೊಬ್ಬರು ಆಸಕ್ತಿಯಿಂದ ನೋಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತದ ದೂರದೃಷ್ಟಿ ಸ್ಪಷ್ಟವಾಗಿದೆ ಮತ್ತು ಆತ್ಮನಿರ್ಭರ ಭಾರತ ನಿರ್ಮಾಣ ಮಾಡುವುದು ನಮ್ಮ ಭವಿಷ್ಯದ ಕಾರ್ಯಕ್ರಮ ಹಾಗೂ ಗುರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
- ಭಾರತದಲ್ಲಿ ಕೋವಿಡ್ ಸಾವು ಪ್ರಕರಣಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಅಂಕಿ-ಅಂಶಗಳ ನೈಜತೆಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾನಿರ್ದೇಶಕ ಡಾ. ಬಲರಾಂ ಭಾರ್ಗವ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಭಾರ್ಗವ, ಕೋವಿಡ್ ಸಾವುಗಳು ಸಂಭವಿಸುತ್ತಿದ್ದಾಗ ಅವುಗಳನ್ನು ವ್ಯಾಖ್ಯಾನಿಸುವುದು ಕಷ್ಟಸಾಧ್ಯ. ವಿಶ್ವ ಆರೋಗ್ಯ ಸಂಸ್ಥೆಗೂ ಇದು ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದಾರೆ.
- ಎಲ್ಲಾ ರೀತಿಯ ಲಸಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರ ಜತೆಗೆ ಕೈಗೆಟಕುವ ದರದಲ್ಲಿ ಪೂರೈಸಲು ಭಾರತ ಬದ್ಧವಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ. ಬಹು ಭಾಗೀದಾರರ ವಿಜ್ಞಾನ ಮತ್ತು ತಂತ್ರಜ್ಞಾನ ವೇದಿಕೆ ಹಾಗೂ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ನಾವಿನ್ಯತೆ ಕುರಿತ ೭ನೇ ವಾರ್ಷಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಡಾ. ಜಿತೇಂದ್ರ ಸಿಂಗ್, ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಸಮಾನತೆಯ ತತ್ವವನ್ನು ಭಾರತ ಬಲವಾಗಿ ಪ್ರತಿಪಾದಿಸುತ್ತಾ ಬಂದಿದೆ ಎಂದರು.
- ರಾಜ್ಯದಲ್ಲಿ ನಿಗದಿಯಂತೆ ಇದೇ 16ರಿಂದ ಶಾಲೆಗಳು ಪ್ರಾರಂಭವಾಗಲಿವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ. ನಾಗೇಶ್ ಬೆಂಗಳೂರಿನಲ್ಲಿಂದು ಸ್ಪಷ್ಟಪಡಿಸಿದ್ದಾರೆ. ಕೆಲಭಾಗದಲ್ಲಿ ಬಿಸಿಲಿನ ತಾಪಮಾನ ಏರುತ್ತಿರುವುದರಿಂದ ಶಾಲೆಗಳ ಆರಂಭ ಮುಂದೂಡುವ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಹೇಳಿದರು.
- ರಾಗಿ ಖರೀದಿ ಕೇಂದ್ರಗಳಲ್ಲಿ ಮಧ್ಯವರ್ತಿಗಳು ಮತ್ತು ದಲ್ಲಾಳಿಗಳು ಕಂಡು ಬಂದರೆ, ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಹಾಸನ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದ ಅನುಮತಿ ಪಡೆದು, ರಾಗಿ ಖರೀದಿಯನ್ನು ಪುನಃ ಆರಂಭಿಸಲಾಗಿದ್ದು, ಇದು ರೈತರಿಗೆ ತಲುಪಬೇಕು ಎಂಬುದು ರಾಜ್ಯ ಸರ್ಕಾರದ ಗುರಿಯಾಗಿದೆ ಎಂದರು.
- ಬರುವ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಯಶಸ್ವಿನಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಹಕಾರ ಇಲಾಖೆಯ ಕಾರ್ಯಕ್ರಮಗಳ ಅನುಷ್ಠಾನ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಸಂಬಂಧ ಆರ್‌ಬಿಐ ನಿಯಮಾವಳಿ ಅನುಸಾರ ಅಗತ್ಯ ದಾಖಲೆ ಸಲ್ಲಿಸುವ ಕಾರ್ಯ ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
- ರಾಜ್ಯದಲ್ಲಿರುವ 13ಶಾಖೋತ್ಪನ್ನ ಘಟಕಗಳು ಪೂರ್ಣಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡುತ್ತಿವೆ. ಈ ಘಟಕಗಳಿಗೆ ಅಗತ್ಯವಾದ ಕಲ್ಲಿದ್ದಲು ಸರಬರಾಜು ಆಗುತ್ತಿದೆ ಎಂದು ಇಂಧನ ಸಚಿವ ವಿ.ಸುನೀಲ್‌ಕುಮಾರ್ ಹೇಳಿದ್ದಾರೆ.
- ರಾಜ್ಯದಲ್ಲಿ ಪ್ರಸ್ತುತ 6 ಲಕ್ಷ 83 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ಯಾವುದೇ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಅಭಾವ ಉಂಟಾಗುವುದಿಲ್ಲವೆಂದು ಕೃಷಿ ಖಾತೆ ಸಚಿವ ಬಿ.ಸಿ. ಪಾಟೀಲ ಹಾವೇರಿಯಲ್ಲಿ ಹೇಳಿದ್ದಾರೆ.
- ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತದೆಯೋ ಅಷ್ಟೇ ಮಹತ್ವ, ಮಾನಸಿಕ ಆರೋಗ್ಯಕ್ಕೂ ಸಿಗವೇಕು. ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದಕ್ಕೆ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೇವಾಡಿಯಾದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


