ದಿನದ ಸುದ್ದಿ
ಭಾನುವಾರ | ಬೆಳಗಿನ ಪ್ರಮುಖ ಸುದ್ದಿಗಳು
ಭಾನುವಾರ | ಬೆಳಗಿನ ಪ್ರಮುಖ ಸುದ್ದಿಗಳು
- ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಒತ್ತು ನೀಡುತ್ತಿದೆ. ಒಂದೇ ವರ್ಷದಲ್ಲಿ 7 ಸಾವಿರ ಕೊಠಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವುದರ ಜತೆಗೆ ಕಡು ಬಡವರಿಗೆ, ಹಿರಿಯರಿಗೆ ಉಚಿತ ಆರೋಗ್ಯ ತಪಾಸಣೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿರಿಯೂರಿನಲ್ಲಿ ನಿನ್ನೆ ಹೇಳಿದ್ದಾರೆ.
- ರಾಜ್ಯ ಸರ್ಕಾರದ ಐಟಿ ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಬೆಂಬಲದೊಂದಿಗೆ ಬೆಂಗಳೂರು ಬಯೋ ಇನ್ನೋವೇಶನ್ ಸೆಂಟರ್ ಮತ್ತು ಸೆಂಟರ್ ಫಾರ್ ಸೆಲ್ಯೂಲರ್ ಅಂಡ್ ಮಾಲಿಕ್ಯೂಲರ್ ಫ್ಲಾಟ್ ಫಾರ್ಮ್ಸ್, ಬಯೋ ಸ್ಪೆಕ್ಟ್ರಮ್ ವಾರ್ಷಿಕ ಸಮೀಕ್ಷೆಯಲ್ಲಿ ಸಾರ್ವಜನಿಕ ವಲಯ ವಿಭಾಗದಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವೀತಿಯ ಸ್ಥಾನಗಳನ್ನು ಪಡೆದುಕೊಂಡಿವೆ ಎಂದು ಐಟಿಬಿಟಿ ಸಚಿವ ಡಾ|| ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಮತ್ತು ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಆಯೋಜಿಸಲಿರುವ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
- ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ತಗ್ಗಿಸಲು ಉದ್ಯಮಿಗಳು ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮನವಿ ಮಾಡಿದ್ದಾರೆ. ಖಾನ್‌ಪುರದಲ್ಲಿ ನಿನ್ನೆ ಉತ್ತರಪ್ರದೇಶದ ವ್ಯಾಪಾರಿಗಳ ಒಕ್ಕೂಟದ 90ನೇ ವಾರ್ಷಿಕೋತ್ಸವದಲ್ಲಿ ಪೊಲ್ಗೊಂಡು ಅವರು ಮಾತನಾಡಿದರು. ಕೈಗಾರಿಕೆಗಳ ಸ್ಥಾಪನೆ ವಿಚಾರದಲ್ಲಿ ಖಾನ್‌ಪುರ ಪ್ರಸಿದ್ಧಿಯಾಗಿದೆ. ಆದರೆ ಇದೇ ಸಂದರ್ಭದಲ್ಲಿ ಮಾಲಿನ್ಯ ಹೆಚ್ಚುತ್ತಿರುವ ಬಗ್ಗೆ ಅಪಖ್ಯಾತಿಗೂ ಪಾತ್ರವಾಗಿದೆ. ವಿಶೇಷವಾಗಿ ಗಂಗಾನದಿಯಲ್ಲಿ ಮಾಲಿನ್ಯ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ ಎಂದರು.
- ಪರಿಸರ ಸಂರಕ್ಷಣೆಗೆ ಪೂರಕವಾದ ಜೀವನಶೈಲಿ ಕುರಿತ ಜಾಗತಿಕ ಉಪಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಲ್ ಅಂಡ್ ಮೆಲಿಂಡಾ ಗೇಟ್ಸ್ ಫೌಂಡೇಷನ್‌ನ ಸಹ ಅಧ್ಯಕ್ಷ ಬಿಲ್‌ಗೇಟ್ಸ್ ಕ್ಲೈಮೆಟ್ ಎಕಾನಾಮಿಸ್ಟ್ ಲಾರ್ಡ್ ನಿಕೋಲಾಸ ಸ್ಟರ್ನ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರದಾನ ಭಾಷಣ ಮಾಡಲಿದ್ದಾರೆ.
- ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ. ಕೇಂದ್ರ ಸರ್ಕಾರ ಯೋಜನೆ ಜಾರಿಗೆ 20 ಸಾವಿರ ಕೋಟಿ ರೂಪಾಯಿ ಮಂಜೂರು ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದಲ್ಲಿ ನಿನ್ನೆ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
- ಕೃಷಿ ಮತ್ತು ಜಲಾನಯನ ಇಲಾಖೆಯಿಂದ ಇದೇ ಮೊದಲ ಬಾರಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ತುಮಕೂರಿನಲ್ಲಿ ಕೋಟಿ ವೃಕ್ಷ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹಿರೇಕೇರೂರಿನಲ್ಲಿ ಹೇಳಿದ್ದಾರೆ.
- ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಿಸಲಾಗಿದೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವಸದಸ್ಯರ ಸಭೆಯ ನಂತರ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದರು. ಬೆಂಗಳೂರಿನ ರಾಷ್ಟ್ರೋತ್ಥಾನ ಸಂಸ್ಥೆ ಅತ್ಯತ್ತಮ ಪ್ರಕಾಶನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇಂದು ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 40ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
- ದೇಶದ ವಿವಿಧ ಕಲ್ಲಿದ್ದಲು ನಿಗಮಗಳಲ್ಲಿ ಸುಮಾರು 73 ಮಿಲಿಯನ್ ಟನ್ ಕಲ್ಲಿದ್ದಲು ದಾಸ್ತಾನು ಇದೆ. ಶಾಖೋತ್ಪನ್ನ ಘಟಕಗಳಿಗೆ ಅಗತ್ಯವಾದ ಕಲ್ಲಿದ್ದಲನ್ನು ಸರಬರಾಜು ಮಾಡಲಾಗುವುದು ಎಂದು ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ನೈವೇಲಿಯಲ್ಲಿ ನಿನ್ನೆ ಮಾಧಮಗಳಿಗೆ ಮಾಹಿತಿ ನೀಡಿದ್ದಾರೆ.
- ವಿಶ್ವ ಪರಿಸರ ದಿನದ ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಏರ್ಪಡಿಸಿರುವ ಮಣ್ಣಿನ ಫಲವತ್ತತೆ ರಕ್ಷಣೆ ಕುರಿತ ಆಂಧೋಲನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸಭಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಣ್ಣಿನ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ’ಸೇವ್ ಸಾಯಿಲ್ ಮುಮೆಂಟ್’ ಎಂಬುದನ್ನು ಜಾಗತಿಕ ಆಂದೋಲನವನ್ನಾಗಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ಮುಂದೆ ಮತ್ತಷ್ಟು ಸುಲಭ: ‘ಸಕಾಲ’ ಸೇವೆಗೆ ಭೌತಿಕ ಆರ್‌ಟಿಐ ಅರ್ಜಿಗಳ ಸೇರ್ಪಡೆ, ಗ್ರಾಮ ಒನ್‌ನಲ್ಲೂ ಲಭ್ಯ
ಸುದ್ದಿದಿನ,ಬೆಂಗಳೂರು: ನಾಗರಿಕರಿಗೆ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ ಎರಡು ಪ್ರಮುಖ ಹಾಗೂ ನೂತನ ನಿರ್ಧಾರಗಳನ್ನು ಕೈಗೊಂಡಿದೆ.
ಭೌತಿಕ ಆರ್‌ಟಿಐ ಅರ್ಜಿಗಳ ದಾಖಲಾತಿ ಈಗ ‘ಸಕಾಲ’ ಸೇವೆ
ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಭೌತಿಕ (ಕಾಗದದ ರೂಪದ) ಆರ್‌ಟಿಐ ಅರ್ಜಿಗಳನ್ನು ಸ್ವೀಕರಿಸಿದ ಸಾರ್ವಜನಿಕ ಪ್ರಾಧಿಕಾರವು 2 ದಿನಗಳ ಒಳಗಾಗಿ ಆರ್‌ಟಿಐ ಆನ್‌ಲೈನ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು.
ಇದನ್ನು ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ರ ಅಡಿಯಲ್ಲಿ ಖಾತ್ರಿ ಸೇವೆಯಾಗಿ ಅಧಿಸೂಚಿಸಲಾಗಿದೆ. ಇದರಿಂದ ಪ್ರತಿಯೊಬ್ಬ ಅರ್ಜಿದಾರರಿಗೂ ಆನ್‌ಲೈನ್ ನೋಂದಣಿ ಸಂಖ್ಯೆ ದೊರೆಯಲಿದ್ದು, ಅರ್ಜಿಯ ಸ್ಥಿತಿಗತಿಯನ್ನು (Status) ಯಾವಾಗ ಬೇಕಾದರೂ ಪರಿಶೀಲಿಸಬಹುದು.
ಅರ್ಜಿಗಳು ಕಳೆದುಹೋಗುವ ಅಥವಾ ನಿರ್ಲಕ್ಷ್ಯಕ್ಕೆ ಒಳಗಾಗುವ ಸಾಧ್ಯತೆ ಇರುವುದಿಲ್ಲ. ನಿಯಮಿತ ۲ ದಿನಗಳಲ್ಲಿ ಪೋರ್ಟಲ್‌ನಲ್ಲಿ ದಾಖಲಿಸದಿದ್ದರೆ ನಾಗರಿಕರು ಸಕಾಲ ಕಾಯ್ದೆಯಡಿ ಪರಿಹಾರ ವೆಚ್ಚ ಪಡೆಯಲು ಅರ್ಹರಾಗಿರುತ್ತಾರೆ ಹಾಗೂ ಸಂಬಂಧಪಟ್ಟ ಅಧಿಕಾರಿಯೇ ಇದಕ್ಕೆ ಹೊಣೆಗಾರರಾಗುತ್ತಾರೆ.
ಎಲ್ಲಾ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಆರ್‌ಟಿಐ ಸೇವೆ ಲಭ್ಯ
ಇಂಟರ್ನೆಟ್ ಅಥವಾ ಕಂಪ್ಯೂಟರ್ ಬಳಕೆ ತಿಳಿಯದ ಸಾರ್ವಜನಿಕರನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದ ಎಲ್ಲಾ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಆರ್‌ಟಿಐ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ವಿಸ್ತರಿಸಲಾಗಿದೆ.
ನಾಗರಿಕರು ತಮ್ಮ ಸಮೀಪದ ಕೇಂದ್ರಕ್ಕೆ ತೆರಳಿ ಸಿಬ್ಬಂದಿಯ ನೆರವಿನಿಂದ ಅರ್ಜಿ ಸಲ್ಲಿಸಬಹುದು.
ನಿಗದಿತ ಆರ್‌ಟಿಐ ಶುಲ್ಕ ಮತ್ತು ಕೇಂದ್ರದ ನಾಮಮಾತ್ರ ಸೇವಾ ಶುಲ್ಕವನ್ನು ಪಾವತಿಸಿ, ಸ್ಥಳದಲ್ಲೇ ಆನ್‌ಲೈನ್ ಸ್ವೀಕೃತಿ (Acknowledgement) ಪಡೆಯಬಹುದು.
ಗ್ರಾಮ ಪಂಚಾಯಿತಿ ಮಟ್ಟದ ‘ಗ್ರಾಮ ಒನ್’ ಕೇಂದ್ರಗಳ ಮೂಲಕ ಈಗ ಹಳ್ಳಿಯ ಪ್ರತಿಯೊಬ್ಬ ನಾಗರಿಕರಿಗೂ ಆನ್‌ಲೈನ್ ಆರ್‌ಟಿಐ ಸೌಲಭ್ಯ ತಲುಪಿದೆ.
ಪ್ರಮುಖ ಪ್ರಯೋಜನಗಳು
ಏಕರೂಪದ ವೇದಿಕೆ: ಭೌತಿಕ, ಆನ್‌ಲೈನ್ ಅಥವಾ ಸೇವಾ ಕೇಂದ್ರಗಳ ಮೂಲಕ ಬರುವ ಎಲ್ಲಾ ಅರ್ಜಿಗಳು ಒಂದೇ ವೇದಿಕೆಯಡಿ ಬರಲಿವೆ. ಪಾರದರ್ಶಕತೆ: ಆರ್‌ಟಿಐ ಕಾಯ್ದೆ 2005ರ ಕಾಲಮಿತಿಗಳ ಪಾಲನೆಯನ್ನು ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು.
ಇದರಿಂದ ಮಾಹಿತಿ ಅಧಿಕಾರಿಗಳಿಂದಾಗುವ ವಿಳಂಬವನ್ನು ಶೀಘ್ರವಾಗಿ ಗುರುತಿಸಬಹುದು.
ನಾಗರಿಕರಿಗೆ ತಮ್ಮ ಅರ್ಜಿಗಳ ವಿಶ್ವಾಸಾರ್ಹ ದಾಖಲೆ ಲಭ್ಯವಾಗುತ್ತದೆ.
ಸಾರ್ವಜನಿಕರು ನೇರವಾಗಿ ಆನ್‌ಲೈನ್‌ನಲ್ಲಾಗಲಿ ಅಥವಾ ತಮ್ಮ ಸಮೀಪದ ಸೇವಾ ಕೇಂದ್ರಗಳ (ಬೆಂಗಳೂರು ಒನ್/ಕರ್ನಾಟಕ ಒನ್/ಗ್ರಾಮ ಒನ್) ಮೂಲಕವಾಗಲಿ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಗರಿಷ್ಠ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆಆರ್.ಐ.ಡಿ.ಎಲ್ ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.
ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.
ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


