Connect with us

ದಿನದ ಸುದ್ದಿ

ವಿಧಾನಸಭಾ ಚುನಾವಣೆ | ಬಹಿರಂಗ ಪ್ರಚಾರಕ್ಕೆ ತೆರೆ : ಮತದಾನಕ್ಕೆ ಸಕಲ ಸಿದ್ಧತೆ

Published

on

ಸುದ್ದಿದಿನ, ಬೆಂಗಳೂರು : ಇದೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸಂಜೆ ತೆರೆ ಬಿದ್ದಿದೆ. ಇನ್ನೇನಿದ್ದರು ಅಭ್ಯರ್ಥಿಗಳು ಮತ್ತು ಸ್ಥಳೀಯ ರಾಜಕೀಯ ಮುಖಂಡರು ಮನೆ-ಮನೆಗೆ ತೆರಳಿ ಮತಯಾಚನೆಗೆ ಅವಕಾಶವಿರುತ್ತದೆ.

ಬಹಿರಂಗ ಪ್ರಚಾರದ ಗಡುವು ಮುಗಿದಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ವಿವಿಧ ರಾಜಕೀಯ ಪಕ್ಷಗಳ ತಾರಾಪ್ರಚಾರಕರು ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಮತಪಟ್ಟಿಯಲ್ಲಿ ಹೆಸರಿಲ್ಲದ ರಾಜಕೀಯ ನಾಯಕರು ಸೇರಿದಂತೆ ಎಲ್ಲ ಮುಖಂಡರು ಕ್ಷೇತ್ರಗಳನ್ನು ಖಾಲಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಒಂದೇ ಹಂತದ ಮತದಾನ

ರಾಜ್ಯದ ಎಲ್ಲ 224 ಕ್ಷೇತ್ರಗಳಿಗೆ ನಾಡಿದ್ದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಂದು ಬೆಳಗ್ಗೆ7 ರಿಂದ ಸಂಜೆ 6 ಗಂಟೆವರೆಗೆ ಮತದಾರರು ತಮ್ಮ ಸಂವಿಧಾನಬದ್ಧ ಹಕ್ಕನ್ನು ಚಲಾಯಿಸಲು ಆಯೋಗ ಅನುವು ಮಾಡಿಕೊಟ್ಟಿದೆ.

ಈ ನಡುವೆ 80 ವರ್ಷ ಮೇಲ್ಪಟ್ಟ ಹಾಗೂ ದಿವ್ಯಾಂಗರು ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಅವಕಾಶ ಮಾಡಿಕೊಟ್ಟಿತ್ತು. ಈ ಸದಾವಕಾಶವನ್ನು ಹಿರಿಯ ನಾಗರಿಕರು ಮತ್ತು ದಿವ್ಯಾಂಗರು ಅಧಿಕ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಂಡಿರುವುದು ಆಯೋಗದ ವರದಿಯಿಂದ ತಿಳಿದುಬಂದಿದೆ.

ಬಹಿರಂಗ ಪ್ರಚಾರ

ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಗಡುವಿಗೆ ಮುನ್ನ ಬಿಜೆಪಿ, ಕಾಂಗ್ರೆಸ್,ಜೆಡಿಎಸ್, ಆಮ್ ಆದ್ಮಿ ಪಕ್ಷ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು ಸಾರ್ವಜನಿಕ ಸಭೆ, ರೋಡ್ ಶೋ, ರ್‍ಯಾಲಿಗಳ ಮುಖಾಂತರ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ವಕ್ಷೇತ್ರ ಶಿಗ್ಗಾವಿಯಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಈ ಕ್ಷೇತ್ರದಿಂದ ಅವರು ನಾಲ್ಕನೇ ಬಾರಿಗೆ ಆಯ್ಕೆ ಬಯಸಿದ್ದಾರೆ.

ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಹಾಗೂ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ರಾಜೀವ್ ಚಂದ್ರಶೇಖರ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಕಲಬುರಗಿ ವಲಯದಲ್ಲಿ ಮೊಕ್ಕಾಂ ಹೂಡಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮ್ಮ ತವರು ಜಿಲ್ಲೆ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕನಕಪುರ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರೆ, ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಬೆಂಗಳೂರಿನ ವಿಜಯನಗರದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಮತ್ತೊಬ್ಬ ಕಾಂಗ್ರೆಸ್ ಮುಖಂಡ ರಾಹುಲ್‌ಗಾಂಧಿ ಬೆಂಗಳೂರಿನಲ್ಲಿಂದು ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುವ ಮೂಲಕ ಮಹಿಳಾ ಕಾರ್ಮಿಕರು ಮತ್ತು ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ, ಮತಯಾಚನೆ ನಡೆಸಿದರು.

ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಮನವರಿಕೆ ಮಾಡಿಕೊಟ್ಟರು. ಚಲನಚಿತ್ರ ನಟ ಶಿವರಾಜ್‌ಕುಮಾರ್ ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಪರ ಮತಯಾಚಿಸಿದರು.

ಮತ್ತೊಂದೆಡೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಳವಳ್ಳಿ, ಹೊಳೆನರಸೀಪುರ, ಹಾಸನ ಮತ್ತು ರಾಮನಗರದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದರು. ಅವರ ಪುತ್ರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಾವು ಪ್ರತಿನಿಧಿಸುವ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು.

ಆಮ್ ಆದ್ಮಿ ಪಕ್ಷ ನಾಯಕರು ಬೆಂಗಳೂರಿನಲ್ಲಿ ರೋಡ್ ಶೋ ಮೂಲಕ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.

ಏತನ್ಮಧ್ಯೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರರ ವಿರುದ್ಧ ಪ್ರತ್ಯೇಕವಾಗಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

Published

on

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

Published

on

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.

ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.

ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending