ದಿನದ ಸುದ್ದಿ
ಮಹಾಮಳೆ | ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಸುದ್ದಿದಿನ, ಬೆಂಗಳೂರು : ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿ, ಜನ ಜೀವನ ಅಸ್ಥವ್ಯಸ್ಥವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭದ್ರ ಜಲಾಶಯದಲ್ಲಿ ನೀರಿನ ಒಳ ಹರಿವು ಹೆಚ್ಚಳವಾಗಿದ್ದು, ಜಲಾಶಯಕ್ಕೆ 59 ಸಾವಿರದ 500 ಕ್ಯೂಸೆಕ್ ನೀರು ಹರಿದು ಬಂದಿದೆ. ಜಲಾಶಯದ ಗರಿಷ್ಠ ಮಟ್ಟ 1 ಸಾವಿರದ 633 ಅಡಿ ಇದ್ದು, ಇಂದಿನ ಮಟ್ಟ 1ಸಾವಿರದ 600ಅಡಿಗೆ ತಲುಪಿದೆ. ಜಲಾಶಯದಿಂದ ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಲಕ್ಷಾಂತರ ಎಕರೆ ಜಮೀನಿಗೆ ನೀರುಣಿಸಲಾಗುತ್ತಿದೆ.
ಕೃಷಿ ಚಟುವಟಿಕೆಗಳು ತಡವಾಗಿದ್ದರೂ ಸಹ ಅಗತ್ಯ ನೀರು ಬಿಡುಗಡೆ ಕುರಿತಂತೆ ತುಂಗಭದ್ರ ಸಲಹಾ ಸಮಿತಿ ಸಭೆ ಸೇರಿ ತೀರ್ಮಾನ ಕೈಗೊಳ್ಳಲಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾನುವಾರ ಇಡೀ ದಿನ ಮಳೆ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ತಸ್ಯವಾಗಿದೆ. ಹೊನ್ನಾವರದ ಗುಂಡಬಾಳ ನದಿಪಾತ್ರದ ಮನೆಗಳಿಗೆ ನೀರು ನುಗ್ಗಿದೆ. ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶರಾವತಿ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಅದರ ಉಪನದಿ ಗುಂಡಬಾಳ ನದಿಯೂ ಉಕ್ಕಿ ಹರಿಯುತ್ತಿದ್ದು ನದಿಪಾತ್ರದ ಹತ್ತಾರು ಮನೆಗಳು ಜಲದಿಗ್ಬಂಧನಕ್ಕೆ ಒಳಪಟ್ಟಿವೆ. ಮಳೆ ನಿರಂತರ ಸುರಿಯುತ್ತಿರುವುದರಿಂದ ಇಲ್ಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಭಾರಿ ಮಳೆಗೆ ದಾಂಡೇಲಿ – ಹಳಿಯಾಳ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜೊಯಿಡಾ-ಕುಂಬಾರವಾಡಾ ಮಾರ್ಗ ಮಧ್ಯದ ದೊಣಪಾದಲ್ಲಿ ಸದಾಶಿವಗಡ ಔರಾದ್ ರಾಜ್ಯ ಹೆದ್ದಾರಿ ಮೇಲೆ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಯಲ್ಲಾಪುರ ತಾಲ್ಲೂಕಿನಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆ ಜತೆಗೆ ವೇಗವಾಗಿ ಗಾಳಿ ಬೀಸುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ’ ಎಂದು ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಪ್ರಕೃತಿ ವಿಕೋಪ ಉಂಟಾದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎನ್‌ಡಿಆರ್‌ಎಪ್ ಮತ್ತು ಎಸ್‌ಡಿಆರ್‌ಎಫ್ ತಂಡಗಳ ಜೊತೆಗೆ ೩೬ ಬೋಟುಗಳನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಸಿದೆ. ಹಾವೇರಿ ಜಿಲ್ಲೆಯಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನ-ಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಜಿಲ್ಲೆಯಲ್ಲಿ ಹರಿಯುವ ತುಂಗಭದ್ರ, ವರದಾ, ಕುಮದ್ವತಿ, ಧರ್ಮಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರಿಗೆ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಜನ-ಜೀವನ ಬಾಧಿತಗೊಂಡಿದೆ. ಕಳೆದ 24 ಗಂಟೆಗಳಲ್ಲಿ 1 ಸಾವಿರದ 120 ಮಿಲಿಮೀಟರ್ ಮಳೆಸುರಿದಿದೆ. ಜಿಲ್ಲೆಯ ವರದಾ ನದಿ ಬಹುತೇಕ ಭರ್ತಿಯಾಗಿದೆ. ಕೆಲವು ಪ್ರದೇಶಗಳ ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲಾಡಳಿತ ಘಟನಾ ಸ್ಥಳವನ್ನು ಪರಿಶೀಲಿಸಿದೆ ಎಂದು ವರದಿಯಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ಮತ್ತು ಉಪನದಿಗಳ ಮಟ್ಟ ಗಣನೀಯವಾಗಿ ಏರಿಕೆಯಾಗಿವೆ. ಕಾನಾಪುರ, ಕಿತ್ತೂರು, ಬೆಳಗಾವಿ ಗ್ರಾಮಾಂತರ ತಾಲೂಕುಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜಾಪುರ್ ಬ್ಯಾರೆಜ್‌ನಿಂದ 2 ಸಾವಿರ ಕ್ಯೂಸೆಕ್ ನೀರನ್ನು ಬಿಟ್ಟಿರುವುದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಬರುವ 7 ಸೇತುವೆಗಳು ಮುಳುಗಡೆಯಾಗಿವೆ. ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ವರದಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಐದು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಂಬಾರಗಣವಿ ಸಂಪರ್ಕದ ಸೇತುವೆ ನೀರಿನಿಂದ ಮುಚ್ಚಿ ಹೊಗಿದ್ದು, ಗ್ರಾಮಸ್ಥರು ತೊಂದರೆಗೀಡಾಗಿದ್ದಾರೆ. ಇದರ ಪರಿಹಾರಕ್ಕಾಗಿ 1ಕೋಟಿ 5 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಮಳೆ ಬೀಳುತ್ತಿದ್ದು, ಕಾವೇರಿ, ನದಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಎಲ್ಲೆಡೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕಾವೇರಿ ನದಿಯ ಪ್ರವಾಹದಿಂದ ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ್ತಗೊಂಡಿದೆ.
ಭಾಗಮಂಡಲ-ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೊಡಗಿನ ಚಿಕ್ಕ ಹೊಳೆ ಜಲಾಶಯ ಬಹುತೇಕ ಭರ್ತಿಯಾಗಿದೆ. ಹಾರಂಗಿ ಅಣೆಕಟ್ಟೆನ ಮುಂಭಾಗದ ಸೇತುವೆ ಬಹುತೇಕವಾಗಿ ಜಲಾವೃತ್ತವಾಗಿದೆ. ಕೆಲವು ಗ್ರಾಮಗಳಲ್ಲಿ ಸಂಪರ್ಕ ಕಡಿತವಾಗಿದ್ದು, ರಸ್ತೆ ಮೇಲೆ ಮರ ಉರುಳಿ ಬಿದ್ದಿದ್ದರಿಂದ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಸ್ಥಳೀಯ ಮತ್ತು ಅರಣ್ಯ ಆಡಳಿತದ ನೆರವಿನಿಂದ ಮರವನ್ನು ತೆರವುಗೊಳಿಸುವ ಕಾರ್ಯ ಚುರುಕುಗೊಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಹೇಮಾವತಿ, ತುಂಗ ಮತ್ತು ಭದ್ರ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳಸದಿಂದ ಹೊರನಾಡು ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿ ಪರೀಶೀಲಿಸಿದರು.
ಕುದುರೇಮುಖ ಮಂಗಳೂರು ರಸ್ತೆಯ ಮೇಲೆ ಭದ್ರಾ ನದಿ ನೀರು ಹರಿಯುತ್ತಿದೆ. ಅಲ್ಲದೆ ಜಿಲ್ಲೆಯ ಮುಳ್ಳಯ್ಯನಗಿರಿ, ಕಡೂರು-ಚಿಕ್ಕಮಗಳೂರು, ಶೃಂಗೇರಿಯಲ್ಲಿ ತುಂಗಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರಮುಖ ರಸ್ತೆಗಳಿಗೆ ನೀರು ನುಗ್ಗಿದೆ. ಕುದುರೆಮುಖ, ಮಂಗಳೂರು ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು; ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




