Connect with us

ದಿನದ ಸುದ್ದಿ

ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ‘ಎಳೆ’ ತಂದರೋ..!

Published

on

  • ನವೀನ್ ಸಾಗರ್, ಬೆಂಗಳೂರು

ಸಿನಿಮಾ ಹಾಡುಗಳು ಕವನಗಳು ಎಲ್ಲ ಗದ್ಯಗಳಷ್ಟು ನೇರ ಸಲೀಸು ಅಲ್ಲ. ಹೇಳಬೇಕಿರೊದನ್ನು ಗದ್ಯಗಳ ಹಾಗೆ ಸೀದಾಸಾದಾವಾಗಿ ಕವನಗಳು, ಸಿನಿಗೀತೆಗಳು ಹೇಳುವುದಿಲ್ಲ. ಹಾಗೆ ಹೇಳಿಬಿಟ್ಟರೆ ಅವು ಕವನ/ಹಾಡು/ಪದ್ಯಗಳೇ ಅಲ್ಲ!!!

ಹಾಡು ಅಂದರೆ ಅಲ್ಲಿ ಉಪಮೆಗಳು ಗೂಢಾರ್ಥಗಳು ದ್ವಂದ್ವಾರ್ಥಗಳು(ದ್ವಂದ್ವಾರ್ಥ ಅಂದ್ರೆ ಅಶ್ಲೀಲ ಮಾತ್ರವೇ ಅಲ್ಲ), ಎರಡುಮೂರು ವಿಚಾರಗಳನ್ನು ಹೇಳಬಲ್ಲ ಒಂದೇ ಒಂದು ಸಾಲು, ಇನ್ಯಾವತ್ತೋ ರೆಲೆವೆಂಟ್ ಅನಿಸಬಲ್ಲ ಕಲ್ಪನೆಗಳು ಏನೇನೋ ತುಂಬಿಹೋಗಿರುತ್ತವೆ. ಅದಕ್ಕೊಂದು ಮೂಡ್ ಇರುತ್ತೆ.

ಒಬ್ಬೊಬ್ಬ ಓದುಗನಲ್ಲಿ ಒಂದೊಂದು ಭಾವ ಹುಟ್ಟಿಸಬಲ್ಲ ಶಕ್ತಿ ಕವಿತೆಗಳಿಗಿರುತ್ತದೆ. ನನಗೆ ರೊಮ್ಯಾಂಟಿಕ್ ಅನಿಸುವ ಗೀತೆಯೊಂದು ಇನ್ನೊಬ್ಬನಿಗೆ ವಿರಹಗೀತೆ ಅನಿಸಬಹುದು. ನನಗೆ ಲಾಲಿ ಹಾಡೆನಿಸುವ ಗೀತೆಯೊಂದು ಇನ್ಯಾರಿಗೋ ಜಾಲಿ ಗೀತೆ ಅನಿಸಬಹುದು. ಇನ್ನೊಬ್ರಿಗೆ ಶೋಕಗೀತೆ ಅನಿಸೋ ಗೀತೆಯಲ್ಲಿ ನನಗೇನೋ ತುಂಟತನ ಕಾಣಿಸಬಹುದು. ಸಭ್ಯಗೀತೆ ಅನಿಸುವ ಹಾಡೊಂದು ಸಾಲುಸಾಲಲ್ಲೂ ಡಬಲ್ ಮೀನಿಂಗ್ ತುಂಬ್ಕೊಂಡಿದೆಯಲ್ಲ ಅನಿಸಬಹುದು. ಗ್ರಹಿಕೆ ಮೂಡು ವಯಸ್ಸು ಸಂದರ್ಭ ಇವೆಲ್ಲದರ ಮೇಲೆ ಹಾಡೊಂದು ನಮ್ಮನ್ನು ತಲುಪೋ ಬಗೆ ಬದಲಾಗುತ್ತಾ ಹೋಗುತ್ತದೆ‌. ಅಷ್ಟಾಗಿಯೂ ಅಸಲಿಗೆ ಅದನ್ನು ಬರೆದ ಕವಿಯ ಯೋಚನೆ ನಾವು ಗ್ರಹಿಸಿದ್ದೆಲ್ಲಕ್ಕಿಂತ ಭಿನ್ನವಾಗಿದ್ದಿನ್ನೇನೋ ಇದ್ದರೂ ಇರಬಹುದು.

ಹಲವು ಬಾರಿ ಕವಿಗೆ ತನ್ನ ಗೀತೆ ತಾನಂದುಕೊಂಡ ಭಾವದಲ್ಲೇ ರೀಚ್ ಆಗಿದೆ ಅನ್ನೋ ಖುಷಿ ತೃಪ್ತಿ ಸಿಗುತ್ತದೆ. ಕೆಲವು ಬಾರಿ .. ಅರೆ ಬರೆಯುವಾಗ ನಾನೇ ಹೀಗೊಂದು ಗೂಡಾರ್ಥದ ಬಗ್ಗೆ ಯೋಚಿಸಿರಲಿಲ್ಲ. ಕೇಳುಗ ಇದಕ್ಕೆ ಇನ್ನೊಂದು ಆಯಾಮವನ್ನೇ ಕೊಟ್ಟುಬಿಟ್ಟನಲ್ಲ ಅಂತ ಅಚ್ಚರಿಯಾಗಬಹುದು. ಕೆಲವೊಮ್ಮೆ ತನಗೇ ಗೊತ್ತಿಲ್ಲದ ಅರ್ಥ ಹುಟ್ಟಿಸಿ ತನ್ನನ್ನು ಕೇಳುಗರು ಮೇಲೇರಿಸಿ ಕೂರಿಸಿದಾಗ, ಈ ಕ್ರೆಡಿಟ್ ಬಿಟ್ಟುಕೊಡಲಿಷ್ಟ ಪಡದ ಕರಪ್ಟ್ ಮನಸು.. ಹೌದೌದು ನಾನು ಹೀಗೆ ಎರಡರ್ಥ ಹುದುಗಿಸಿ‌ಈ ಸಾಲು ಬರೆದಿದ್ದೆ ಎಂದು ಧ್ವನಿಗೂಡಿಸುತ್ತದೆ. ಅದೇ ವಿವಾದಕ್ಕೋ ಅವಹೇಳನಕ್ಕೋ ಕಾರಣವಾದರೆ .. ಇಲ್ಲ ನಾನು ಬರೆದದ್ದು ಈ ಅರ್ಥದಲ್ಲಿ ಅಂತ ಸೇಫ್ಟಿ ಮೋಡ್ ಗೂ ಹೋಗುತ್ತದೆ. ಹಾಡು/ಕವಿತೆಗಳಿಗೆ ಈ ವ್ಯಾಖ್ಯಾನದ ಮೂಲಕ ಬಚಾವಾಗುವ ಇಮೇಜ್ ರೂಪಿಸಿಕೊಳ್ಳುವ ಅವಕಾಶವಿರುತ್ತದೆ‌. ಗದ್ಯಗಳಿಗೆ ಆ ಪ್ರಿವೆಲೇಜ್ ಇರೋದಿಲ್ಲ.

ಸಂಭ್ರಮ ಚಿತ್ರದಲ್ಲಿ ಹಂಸಲೇಖ … “ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ಎಳೆ ತಂದರೋ…” ಗೀತೆಯಲ್ಲಿ ” ಎಳೆ” ಪದವನ್ನು ಎರಡರ್ಥ ಬರುತ್ತದೆಂದೇ ಬಳಸಿದರೋ ಬರೆದ ಮೇಲೆ ಎರಡರ್ಥ ಕೇಳುಗರ ಗ್ರಹಿಕೆಗೆ ಬಂತೋ ಎಂಬ ಪ್ರಶ್ನೆಯಂತೆ ಇದು. ಹಂಸ ಲೇಖಾವ್ರು ಪ್ರೀತಿಯ ’ಎಳೆ’ಯ ಬಗ್ಗೆ ಬರೆದಿರಬಹುದು. ಅಥವಾ ಎಳೆದು ತಂದರೋ ಎಂದು ಕೇಳಿಯೂ ಬರೆದಿರಬಹುದು. ಅಥವಾ ಅವರಿಗಿರೋ ಪನ್ ಸೆನ್ಸ್ ಗೆ ಈ ಎರಡೂ ಅರ್ಥ ಬರಲಿ ಅಂತಲೇ ಎಳೆ ಎಂಬ ಪದ ಬಳಸಿರಬಹುದು. ಈ ಥರದ ಸಾಕಷ್ಟು ಉದಾಹರಣೆ ಸಿಗುತ್ತದೆ. ಸಾಹಿತ್ಯ ಗಮನಿಸಲು ಶುರು ಮಾಡಿದಾಗ ಇಂಥ ಖುಷಿ ಅನುಭೂತಿಗಳು ಸಿಗಲಾರಂಭಿಸುತ್ತವೆ. ರಿಸರ್ಚಿನಂಥ ಖುಷಿ

ಹಂಸಲೇಖರ … “ಈ ಹರಯದ ನರಕೊಳಲಲಿ ಇವೆ ಸರಿಗಮ ಹೊಳ್ಳೆಗಳು… ಈ ಮದನನ ಕಿರುಬೆರಳಲಿ ನವಿರೇಳದೆ ಗುಳ್ಳೆಗಳು..” ಈ ಸಾಲು ಕೇವಲ ಕಮರ್ಶಿಯಲ್ ಮ್ಯೂಸಿಕಲ್ ಸಾಂಗ್ ಆಗಿ ನಮ್ಮ ಕಿವಿ ತಲುಪಿದಾಗ ಗುನುಗುವ ಸಾಲಾಗುತ್ತದೆ ಅಷ್ಟೆ. ಅರೆ ಹರಯದ ನರಕೊಳಲು ಅಂದ್ರೆ ಏನು… ಮದನನ ಕಿರುಬೆರಳು ಅಂದ್ರೆ.. ? ಸಾಮಾನಿಗೆ ಇಷ್ಟು ಸಭ್ಯಶೃಂಗಾರರೂಪ ಕೊಟ್ಟು ಹೇಳಿರೋದಾ ಅನಿಸಿದಾಗ.. ಶೃಂಗಾರ ಅಡಗಿರೋ‌ ಸಾಲಾದರೂ ಜೋರಾಗಿ ಹೇಳೋಕೆ ಮನಸು ಹಿಂಜರಿಯುತ್ತದೆ.

ಸಾಹಿತ್ಯ ಅಷ್ಟಾಗಿ ಗಮನಿಸದ ವಯಸ್ಸಲ್ಲಿ… “ಮೈಯ್ಯಲ್ಲಿ ಏಳುತಿದೆ ಮನ್ಮಥ‌ನ ಅಂಬುಗಳು.. ಜುಮ್ ಜುಮ್ ಜುಮ್..” ಅನ್ನೋ ಸಾಲು ಸಂಕ್ರಾಂತಿ ಗೀತೆ ಎಂಬಂತೆ ಬಂದು ಹೋಗುತ್ತಿತ್ತು.

ಆದರೆ ಆನಂತರ ಸಾಹಿತ್ಯವಾಗಿ ಗಮನಿಸಿದಾಗ.‌ ಆಹಾ ರೋಮಾಂಚನವನ್ನು.. ಮೈರೋಮ ನಿಮಿರುವುದನ್ನು ಮನ್ಮಥನ ಬಾಣಕ್ಕೆ ಹೋಲಿಸಿದ್ದಾರಲ್ಲ ಅನಿಸಿ ನಿಜಕ್ಕೂ ಜುಮ್ ಅನಿಸಿತ್ತು. ಅದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಯೋಚಿಸಿದರೆ.. ಮೈಯಲ್ಲಿ ಏಳುತಿದೆ ಮನ್ಮಥನ ಅಂಬು ಅಂದ್ರೆ.. ಒನ್ಸಗೇನ್ ಸಾಮಾನಿರಬಹುದಾ ಅನಿಸದಿರದು.

ಸದಾಶಿವಂಗೆ ಅದೇ ಗ್ಯಾನ ಅಂದ್ಕೋಬೇಡಿ..

ನೆನಪಿರಲಿ ಚಿತ್ರದ ಅಜಂತಾ ಎಲ್ಲೋರಾ ಗೀತೆಯಲ್ಲಿ ಬರುವ… “ಮಂದವಾಗಿ ಬಳುಕೋವಂಥ ನಾರಿ ಇವಳ
ಅಂದ ನೋಡಿ ನಿಂತಾಗ..ಚಂದ ನೋಡಿ ನಿಂತಾಗ..
ಯಾರೊ ನೀನು ಎಂದು ಕೇಳುತಾವೆ..
ಇವಳ ಪೊಗರಿನ ಹೃದಯಪಾಲಕಿಯರು..
ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ…”

ಈ ಸಾಲುಗಳು ತನ್ನ ರಿದಮಿಕ್ ಮ್ಯೂಸಿಕ್ ಹಾಗೂ ಸುಲಲಿತವಾಗಿ ಲಘುಗುರು ಇಟ್ಟು ಬರೆದಂಥ ಪದಗಳ‌ ಆಟದಿಂದ ಮಜವಾಗಿ ಹಾಡಿಸಿಕೊಂಡು ಬಿಡ್ತವೆ. ಆದರೆ ಯಾವತ್ತೋ ಆರಾಮಾಗಿ ಸಾಹಿತ್ಯ ಕೇಳ್ತಾ ಇದ್ದರೆ.. ಆಹಾ ..ಹಂಸಲೇಖರ ರಸಿಕಕಲ್ಪನೆಗಳಿಗೆ ಮಿತಿಯೇ ಇಲ್ಲವಾ ಅನಿಸಿಬಿಡುತ್ತದೆ.

ಯಾರೋ ನೀನು ಎಂದು ಕೇಳುತಾವೆ ಇವಳ “ಪೊಗರಿನ ಹೃದಯ ಪಾಲಕಿಯರು” ಎಂದು ಅವರು ರೆಫರ್ ಮಾಡ್ತಿರೋದು ಆ ಹೆಣ್ಣಿನ ಸ್ತನಗಳ ಬಗ್ಗೆ ಅಂತ ಅರ್ಥವಾದಾಗ ಮತ್ತೊಮ್ಮೆ ಈ ಸಾಂಗ್ ಕೊಡುವ ಅನುಭೂತಿಯೇ ವಿಭಿನ್ನ. “ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ” ಎಂದು ಮುಂದುವರಿಸಿ ಆ ಸಾಲಿಗೆ ಇನ್ನಷ್ಟು ರಸಿಕತೆ ತುಂಬುತ್ತಾರೆ ಹಂಸ್.

ಗಡಿಬಿಡಿಗಂಡ ಚಿತ್ರದ…. ಮುದ್ದಾಡೆಂದಿದೆ ಮಲ್ಲಿಗೆ ಹೂ ಗೀತೆಯಲ್ಲಿ……. ನಾಯಕಿ”ಎದೆಯ ಸೆರಗ ಮೋಡದಲ್ಲಿ ನೀನೇ ಚಂದ್ರನೀಗ….” ಅಂದರೆ…. ನಾಯಕ” ಹೃದಯ ಮೇರುಗಿರಿಗಳಲ್ಲಿ… ಕರಗಬಹುದೆ ಈಗ” ಅಂತಾನೆ. “ಮುಡಿಯಲಿ ಮಲ್ಲಿಗೆಯ ಮುಡಿದವಳ ಮೊದಲುಮುಡಿಯಬೇಕು.. ಮಡದಿಗೆ ಪ್ರತಿದಿನವೂ ಮೊದಲಿರುಳಿರಬೇಕು…” ಅಂತ ನಾಯಕಿ ತನ್ನನ್ನು ಮೊದಲು ರಮಿಸು ಅಂತ ಒತ್ತಾಯಿಸುತ್ತಿದ್ದರೆ………… ನಾಯಕ ..” ಮನಸಿನ ಮಧುವಿನ ಮಹಲೊಳಗೆ … ಮದನ ಮಣಿಯಬೇಕು… ಸುರತಿಯ ಪರಮಾನ್ನ ಹಿತಮಿತವಿರಬೇಕು” ಅಂತ ಆಕೆಯ ಮೇಲಿರೋ ಮೋಹದ ಜೊತೆಜೊತೆಗೆ ಪ್ರತಿದಿನ ಬೇಡ ಫ್ರೀಡಮ್ಮು ವೀಕ್ಲಿ ಒನ್ಸು ಜುಮ್ ಜುಮ್ಮು” ಅಂತ ದೂರ ಹೋಗೋ ಪ್ರಯತ್ನ ಕೂಡ ಮಾಡುತ್ತಾನೆ.

ಇದು ಕೂಡ ಹೆಣ್ಣು ತನ್ನ ಗಂಡನ್ನು ಸೆಕ್ಸಿಗಾಗಿ ಕರೆಯುವ ಗೀತೆಯೇ ಆದರೂ… ತನ್ನ ಕ್ಲಾಸಿಕಲ್ ಟ್ಯೂನ್ ನಿಂದ ಚೆಂದದ ಪದಜೋಡಣೆಯಿಂದ… ಈ ಹಾಡು ಕೊಂಚವೂ ಅಶ್ಲೀಲ ಅನಿಸೋದೇ ಇಲ್ಲ. ಅಶ್ಲೀಲ ಅನಿಸಿದರೂ ಓಕೆ ಎಂದು ಬರೆದಾಗ.. ರಾತ್ರಿ ಆಯ್ತು ಮಲಗೋಣ ಇಂದು ನಮ್ಮ ಸೋಭಾನ… ಅಥವಾ ಕಾಯಿ ಕಾಯಿ ನುಗ್ಗೇಕಾಯಿ ಮಹಿಮೆಗೆ ರಾತ್ರಿಯೆಲ್ಲ ನಿದ್ದೆಯಿಲ್ಲ ಕಣ್ಣಿಗೆ.. ನೆಲ್ಲಿಕಾಯಿ ಆಸೆಗೆ ಬಿಟ್ಟು ಬಂದೆ ಹಾಸಿಗೆ ಅಂತ ಸ್ವಲ್ಪ ನೇರವಾಗಿಬಿಡುತ್ತಾರೆ ಹಂಸಲೇಖ.

ಇವೆಲ್ಲ ಸಾಹಿತ್ಯವನ್ನು ಗಮನಿಸುವಾಗ ಅರ್ಥವಾಗುತ್ತಾ ಹೋಗುವ ಅಪಾರಾರ್ಥಗಳು. ತೂಗುಮಂಚದ “ಹಮ್ಮನುಸಿರಬಿಟ್ಟಳು ಎಂಬುದು ಅಮ್ಮನುಸಿರ ಬಿಟ್ಟಳು ಎಂದಾಗಿದ್ದು ಅದನ್ನು ಲಾಲಿಹಾಡೆಂದು ತಪ್ಪು ತಿಳಿದುದರ ಪರಿಣಾಮ ಎಂದು ಹಿಂದೊಮ್ಮೆ ಬರೆದಿದ್ದು ನಿಮಗೆ ನೆನಪಿರಬಹುದು.

ಇನ್ನು ಡಬಲ್ ಮೀನಿಂಗೇ ಹುಡುಕಬೇಕು ಅಂದರೆ ಪ್ರತಿ ಗೀತೆಯೂ ಬೇರೆಯೇ ಅರ್ಥ ಕೊಡಬಲ್ಲ ಕೆಪಾಸಿಟಿ ಹೊಂದಿರುತ್ತದೆ. ಅದು ನಾವು ಆ ಗೀತೆಯನ್ನು ಬಿಂಬಿಸೋಕೆ ಹೊರಟಿರುವ ರೀತಿಯ ಮೇಲೆ ಡಿಪೆಂಡು. ಎಂಥ ಸಭ್ಯಸಾಲನ್ನೂ.. ಕವಿಗೇ ಶಾಕ್ ಆಗುವ ಹಾಗೆ ಡಬಲ್ ಮೀನಿಂಗ್ ಆಗಿಸಬಹುದು. ಆ ಉದಾಹರಣೆ ಈ ಬರಹದಲ್ಲಿ ಬೇಡ. ಮುಂದೆಂದಾದರೂ ಬರೆಯೋಣ.

ಇದೆಲ್ಲ ಬರೆಯೋಕೆ ಹೊರಟಿದ್ದಕ್ಕೆ ಪ್ರೇರಣೆ ಅಣ್ಣಯ್ಯ ಚಿತ್ರದ ಒಂದು ಸಾಂಗ್. ಅಣ್ಣಯ್ಯ ಬಂದು ಹೋಗಿ ಇಪ್ಪತ್ತೈದು ವರ್ಷಕ್ಕೂ ಹೆಚ್ಚು ಟೈಮಾಯ್ತು. ರವಿಚಂದ್ರನ್ ಸಿನಿಮಾಗಳು ಸಾಫ್ಟ್ ಪೋರ್ನ್ ಸಿನಿಮಾಗಳಂತೆ ಭಾಸವಾಗುತ್ತಿದ್ದ ನಮ್ಮ ಏಜಿನ ದಿನಗಳವು. ರವಿಚಂದ್ರನ್ ಸಿನಿಮಾಗಳನ್ನು ನೋಡೋದು ಕಾಶೀನಾಥ್ ಸಿನಿಮಾ ನೋಡೋಷ್ಟೇ ಪಾಪ ಎಂಬಷ್ಟು ಮಡಿವಂತಿಕೆ ದಿನಗಳವು. ಆದರೆ ನಮ್ಮ ಪಾಲಿಗೆ ಆಗ ರವಿಮಾಮಾ ಲವ್ ರೊಮ್ಯಾನ್ಸ್ ಶೃಂಗಾರಗಳಿಗೆ ಗಾಡ್. ಆತ ಹೀರೋಯಿನ್ ಎದೆಯ ಮೇಲೆ ಮುಖವಿಟ್ಟು ಒರಗಿದರೆ ನಮಗೆ ರಸಸ್ಫೋಟ ಆಗುತ್ತಿತ್ತು. ಕುತ್ತಿಗೆಗೊಂದು ಮುತ್ತಿಟ್ಟು ತುದಿಬೆರಳುಗಳನ್ನು ಕತ್ತು ಮತ್ತು ಎದೆಯ ನಡುವೆ ಒಮ್ಮೆ ಆಡಿಸಿದ ಅಂದರೆ ಕೊಳಲು ಲಂಬಕೋನವಾಗುತ್ತಿತ್ತು.

ಆತ ಸೆರಗು ಸರಿಸಿ ಹೊಕ್ಕಳಿಗೊಮ್ಮೆ ಮುತ್ತಿಟ್ಟರೆ ಮುಗಿದೇಹೋಯ್ತು ಊರಸ್ನಾಯುಗಳು ಬಿಗಿಯಾಗಿ ಹೋಗುತ್ತಿದ್ದವು. ಅಂದು ಹಂಸಲೇಖ ಗೀತೆಗಳು ರವಿಚಂದ್ರನ್ ನ ಪಿಚ್ಚರೈಸೇಷನ್ನಲ್ಲಿ ಕಳೆದುಹೋಗಿಬಿಡುತ್ತಿದ್ದವು. ಅಥವಾ ಸಾಹಿತ್ಯ ಸಂಗೀತ ಎಲ್ಲದರಾಚೆಗೆ ನಮಗೆ ಆ ರೊಮ್ಯಾನ್ಸೇ ಹೆಚ್ಚು ಆಕರ್ಷಿಸಿಬಿಡುತ್ತಿತ್ತು. ಕ್ಯಾಸೆಟಲ್ಲಿ ಹಾಡುಗಳನ್ನು ಕೇಳಿ ಸಿನಿಮಾಗೆ ಹೋದಾಗ ಗೀತೆಗಳು ಆಡಿಯೋಗಿಂತ ವಿಡಿಯೋವಾಗಿ ತೃಪ್ತಿಕೊಟ್ಟು ಕಳಿಸುತ್ತಿದ್ದವು. ಆದರೆ ಆನಂತರ ಸಾಹಿತ್ಯ ಗಮನಿಸುವ ಮೆಚುರಿಟಿ, ಸಾಹಿತ್ಯದಲ್ಲಿರುವ ಇಮ್ಯಾಜಿನೇಷನ್ ಪವರ್ ಆಸ್ವಾಧಿಸುವ ಮನಸ್ಥಿತಿ ಎಲ್ಲ ಬಂದಾಗ.. ರವಿ ಚಂದ್ರನ್ ಹಂಸಲೇಖರ ಗೀತೆಗೆ ಹತ್ತು ಪರ್ಸೆಂಟಷ್ಟೂ ನ್ಯಾಯ ಸಲ್ಲಿಸಲು ಸಾಧ್ಯವಾಗಿಲ್ಲ ಅನಿಸಿಬಿಟ್ಟಿದೆ. ಹಾಗಂತ ಹಂಸಲೇಖರ ಸಾಹಿತ್ಯಕ್ಕೆ ನ್ಯಾಯ ಸಲ್ಲಿಸಲು ಸಾಧ್ಯವಿತ್ತಾ? ಖಂಡಿತ ಇಲ್ಲ. ಯಥಾವತ್ ನ್ಯಾಯ ಸಲ್ಲಿಸಲು ಹೋದದ್ದೇ ಆದರೆ ಆ ಸಾಂಗ್ ನ ಪಿಚ್ಚರೈಸೇಷನ್ ಕಾಮಸೂತ್ರವಾಗಿ ಹೋಗುವಷ್ಟು ಹಾಟ್ ಆಗಿಬಿಡುತ್ತಿತ್ತು.

ಆ ಗೀತೆಗಳು ಪಿಚ್ಚರೈಸ್ ಆಗದೆಯೇ ಇಮ್ಯಾಜಿನೇಷನ್ನಲ್ಲೇ ಉಳಿದುಬಿಟ್ಟಿದ್ದರೆ ಎಷ್ಟು ಚೆಂದವಿತ್ತು ಅನಿಸಿದ್ದೂ ಇದೆ. ಸತ್ಯ ಏನಂದರೆ ರವಿಚಂದ್ರನ್ ಸಲ್ಲಿಸಿದಷ್ಟು ನ್ಯಾಯವನ್ನು ಹಂಸಲೇಖರ ಗೀತೆಗೆ ಇನ್ಯಾರೂ ಸಲ್ಲಿಸಲು ಸಾಧ್ಯವಾಗಲಿಲ್ಲ. ರೊಮ್ಯಾಂಟಿಕ್ ಗೀತೆಗಳಲ್ಲಿ ಮಾತ್ರವಲ್ಲ… ಬೇರೆ ಗಂಭೀರ/ಸ್ಯಾಡ್/ಫಿಲಾಸಫಿಕಲ್/ಕ್ರಾಂತಿ ಯಾವ ಗೀತೆಗಳಿಗೂ ವಿಶ್ಯುಯಲಿ ನ್ಯಾಯ ಸಿಕ್ಕಿಲ್ಲ. ಇದು ಹಂಸಲೇಖ ಮಾತ್ರ ಅಲ್ಲ.. ಬಹುತೇಕ ಸಾಹಿತಿಗಳ ಮನಸಿನ ಮೂಲೆಯ ಅಸಮಾಧಾನ ಹಾಗೂ ನೋಡುಗರ ಅಸಂತೃಪ್ತಿ. ಮೊನ್ನೆ ನಾನು ಶೇರ್ ಮಾಡಿಕೊಂಡ ” ಸುಮ್ಮನೆ ಹೀಗೆ ನಿನ್ನನೇ …:” ಎಂಬ ಅಮರ್ ಚಿತ್ರದ ಗೀತೆಯಾದರೂ ಅಷ್ಟೆ. ಅಷ್ಟು ಗಾಢ ಸಾಲುಗಳ ಗೀತೆಗೆ ಅಂಬರೀಶ್ ಪುತ್ರನಿಂದ ಕಲ್ಲುಬಂಡೆಯಂಥ ಅಭಿನಯ. ಇಡೀ ಹಾಡನ್ನು ಲಾಂಗ್ ಶಾಟ್ ಗಳಲ್ಲಿ ತೆಗೆದು ಪ್ರಕೃತಿ ಸೌಂದರ್ಯ ತೋರಿಸಿ ಮುಗಿಸಿದ್ದಾರೆ ನಾಗಶೇಖರ್. ಸಾಹಿತ್ಯಕ್ಕೆ ಸಂಗೀತ ಸಲ್ಲಿಸುವಷ್ಟು ನ್ಯಾಯವನ್ನು ದೃಶ್ಯರೂಪ ಸಲ್ಲಿಸಲು ಸಾಧ್ಯವಿಲ್ಲ. ಬೆಟರ್ ನಾವು ಹಾಡುಗಳನ್ನು ನಮ್ಮ ಇಮ್ಯಾಜಿನೇಷನ್ ಗೆ ತಕ್ಕಂತೆ ಕಣ್ಮುಚ್ಚಿಕೊಂಡು ಮನಸ್ಸಿನೊಳಗೇ ಚಿತ್ರಿಸಿಕೊಂಡುಬಿಡುವುದು.

ಬ್ಯಾಕ್ ಟು ಅಣ್ಣಯ್ಯ ಚಿತ್ರದ ಆ ಸಾಂಗ್ : ಇಷ್ಟು ವರ್ಷದಲ್ಲಿ ಈ ಹಾಡನ್ನು ಕಮ್ಮಿ ಅಂದ್ರೂ ಒಂದು ಸಾವಿರ ಸಲ ಕೇಳಿರುತ್ತೇನೆ. ಹಿಟ್ ಆಲ್ಪಮ್ ಆಗಿರುವ ಅದರ ಕಡಿಮೆ ಪಾಪ್ಯುಲರ್ ಗೀತೆ ಅದು.

“ಅ ಹಾಗೆ ಪ್ರೇಮಿ ಓಹೋ.. ಒ ಹೋಗೆ ಪ್ರೇಮಿ ಆಹಾ…”
ಈ ಹಾಡಿನ ಚಿತ್ರಣ ನಿಮ್ಮನ್ನು ಸಾಹಿತ್ಯ ಗಮನಿಸದಷ್ಟು ಸೆಳೆದುಕೊಳ್ಳುತ್ತದೆ ಕಾರಣ. ರವಿಚಂದ್ರನ್ ಮಧುಬಾಲಾ ಕೆಮಿಸ್ಟ್ರಿ! ಆದರೆ ಅದ್ಯಾಕೋ ಗೀತೆ ತುಂಬ ಅಟ್ರಾಕ್ಟಿವ್ ಅನಿಸಿರಲಿಲ್ಲ. ಕಮಾನು ಡಾರ್ಲಿಂಗ್, ಅಣ್ಣಯ್ಯ ಅಣ್ಣಯ್ಯ ಬಾರೋ, ರಾಗಿ ಹೊಲದಾಗೆ ಖಾಲಿ ಗುಡಿಸಲು ಈ ಗೀತೆಗಳು ಕೊಟ್ಟ ಕಿಕ್ …. ಈ ಅ ಹಾಗೆ ಪ್ರೇಮಿ ಓಹೋ… ಒ ಹೋಗೆ ಪ್ರೇಮಿ ಆಹಾ ಗೀತೆ ನೀಡಿರಲಿಲ್ಲ.

ಹೌದು ನಾನು ಈ ಹಾಡನ್ನು ಕೇಳಿಸಿಕೊಳ್ತಾ ಇದ್ದದ್ದೇ ಹೀಗೆ. ಮೊನ್ನೆಯ ತನಕವೂ…ಆದರೆ ಮೊನ್ನೆ ಯಾಕೋ ಮತ್ತೊಮ್ಮೆ ಕೇಳಿಸಿಕೊಂಡಾಗ.. ಅರೆ ಇಪ್ಪತ್ತೈದು ವರ್ಷ ತಪ್ಪಾಗಿ ತಿಳಿದುಕೊಂಡು ತಪ್ಪಾಗೇ ಹಾಡಿಕೊಂಡೆನಲ್ಲ ಅಂತ ಮೈತುಂಬ ಗಿಲ್ಟು

ಆ ಸಾಂಗ್ ಇರೋದು ಹೀಗೆ…

”ಆಹಾ’ಗೆ ಪ್ರೇಮಿ “ಓಹೋ”
” ಓಹೋ”ಗೆ ಪ್ರೇಮಿ ” ಆಹಾ”

ನನ್ನ ಹಾಗೆ ಅದೆಷ್ಟು ಜನ ಯಾಮಾರಿದ್ದೀರೋ ಗೊತ್ತಿಲ್ಲ. ಅಥವಾ ನಾನೊಬ್ನೇ ಹೀಗೆ ತಪ್ಪಾಗಿ ಕೇಳಿಸಿಕೊಂಡವ್ನೋ ಗೊತ್ತಿಲ್ಲ

ಈ ಗೀತೆಯ ವಿಶೇಷ ಏನಂದ್ರೆ ಹಂಸಲೇಖ. ಆಹಾ ಮತ್ತು ಓಹೋ ಎಂಬ ಎರಡು ಪದಗಳನ್ನೇ ಪ್ರೇಮಿಗಳನ್ನಾಗಿಸಿದ್ದಾರೆ

ಆಹಾಗೆ ಓಹೋ ಪ್ರೇಮಿ… ಓಹೋಗೆ ಆಹಾ ಪ್ರೇಮಿ!
ಅದು ಇಬ್ಬರು ಪ್ರ‍ೇಮಿಗಳ ಹೆಸರು!

ಈಗ ಈ ಹಾಡೊಮ್ಮೆ ಕೇಳಿನೋಡಿ…
ಅದು ಸೌಂಡಾಗೋದೇ ಬೇರೆ ಥರ!

ಅದ್ಯಾಕೆ ಆಹಾ ಓಹೋ ಎಂಬ ಪದಗಳು ಇಲ್ಲಿ ಪಾತ್ರಗಳಾದವು ಅಂತ ಸಿನಿಮಾ ತೆರೆದು ನೋಡಿದೆ. ಈ ಹಾಡು ಆರಂಭವಾಗುವ ಮುನ್ನ ಅಣ್ಣಯ್ಯ ಯಾವುದೋ ಫೈಟಿಂಗಲ್ಲಿ ಒದೆ ತಿಂದು ಬೆನ್ನಿಗೆ ಕಾಶಿ ಕೈಲಿ ಬಿಸಿ ಮಸಾಜ್ ಮಾಡಿಸಿಕೊಳ್ತಾ ಇರ್ತಾನೆ. ಅವನ ಇಮ್ಯಾಜಿನೇಷನಲ್ಲಿ ನಾಯಕಿ ಬಂದು ಕಾಶಿಯ ಬದಲು ಮಸಾಜ್ ಮಾಡ್ತಿರೋ ಹಾಗೆ ಒಂದು ಟ್ವಿಸ್ಟು.. ಇಮ್ಯಾಜಿನೇಷನಲ್ಲೇ ಅವಳೊಂದಿಗೆ ಮಾತಾಡ್ತಾ.. ಆಕೆ ಬಿಸಿ ಶಾಖ ಕೊಟ್ಟಾಗ ಒಮ್ಮೆ ನಾಯಕ ಆಹಾ ಅಂತಾನೆ.. ಇನ್ನೊಮ್ಮೆ ಓಹೋ ಎಂದು ಬಿಗಿಯುಸಿರು ಬಿಡುತ್ತಾನೆ. ಆಗ ಹುಟ್ಟುವ ಹಾಡಿದು. ಡ್ರೀಮ್ ಸಾಂಗ್ ನಲ್ಲಿ ಟೆಕ್ಸ್ಟ್ ಕೂಡ ಬರುತ್ತದೆ ಆಹಾ ಓಹೋ ಅಂತ!

ಸ್ಕ್ರಿಪ್ಟ್ ಜೊತೆ ದೃಶ್ಯರಚನೆ ಜೊತೆ ಗೀತ ಸಾಹಿತಿ ಕನೆಕ್ಟ್ ಆದಾಗ ಇಂಥ ಅದ್ಭುತಗಳು, ಮಜಗಳು, ಕ್ರಿಯೇಟಿವ್ ಐಡಿಯಾಗಳು ಹುಟ್ಟುತ್ತವೆ. ಹಂಸಲೇಖ ಎಲ್ಲೋ ಕೂತು ಹಾಡುಬರೆದುಕೊಟ್ಟು ಸಂಗೀತ ಮಾಡಿಕೊಡ್ತಿರಲಿಲ್ಲ. ಸಿನಿಮಾದೊಂದಿಗೆ ಪ್ರೀ ಪ್ರೊಡಕ್ಷನ್ನಿಂದ ರೀರೆಕಾರ್ಡಿನ ತನಕ ಜರ್ನಿ ಮಾಡ್ತಿದ್ರು ಅನ್ನೋದಕ್ಕೆ ಇದೊಂದು ಸಾಕ್ಷಿ. ಅವರಿಬ್ಬರ ಕಾಂಬಿನೇಷನ್ ಯಾಕೆ ಆ ಪರಿ ಕ್ಲಿಕ್ ಆಗುತ್ತಿತ್ತು ಅನ್ನೋದಕ್ಕೂ ಇದೊಂದು ಪುರಾವೆ. ( ಬರಹ : ನವೀನ್ ಸಾಗರ್ ; ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

Trending