Connect with us

ದಿನದ ಸುದ್ದಿ

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ ವಿದ್ಯುತ್ ಉತ್ಪಾದನೆಗೆ ಒತ್ತು; ಇಂಧನ ಸಚಿವ ಕೆ.ಜೆ.ಜಾರ್ಜ್

Published

on

ಸುದ್ದಿದಿನ,ದಾವಣಗೆರೆ:ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವೇ ಸ್ಥಳಗಳಲ್ಲಿ ಮಾತ್ರ ನಿರ್ವಹಣೆಗಾಗಿ ಕಡಿತ ಮಾಡಲಾಗುತ್ತದೆ. ಆದರೆ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಆದರೆ ಲೋಡ್‍ಶೆಡ್ಡಿಂಗ್ ಜಾರಿಯಲ್ಲಿರುವುದಿಲ್ಲ ಎಂದರು.

ರಾಜ್ಯದಲ್ಲಿ ಪ್ರತಿನಿತ್ಯ 18500 ಮೆಗಾವ್ಯಾಟ್ ಬೇಡಿಕೆ ಇದ್ದು ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದರಿಂದ ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವಿದ್ಯುತ್ ಬ್ಯಾಂಕಿಂಗ್ ಮಾಡಿಕೊಂಡು ಜೂನ್‍ನಿಂದ ಆ ರಾಜ್ಯಗಳಿಗೆ ಕರ್ನಾಟಕದಿಂದ ವಿದ್ಯುತ್ ನೀಡಿ ಬೇಸಿಗೆಯಲ್ಲಿ ಅಲ್ಲಿಂದ ಗ್ರಿಡ್ ಮೂಲಕ ವಿದ್ಯುತ್ ಪಡೆಯಲು ಉದ್ದೇಶಿಸಲಾಗಿದೆ. ಗುಣಮಟ್ಟದ ವೋಲ್ಟೇಜ್‍ಗಾಗಿ ಅಗತ್ಯವಿರುವ ಕಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

3 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ

ಕುಸುಮ್-ಸಿ ಯೋಜನೆಯ ಮೂಲಕ ಮುಂದಿನ ಒಂದೂವರೆ ವರ್ಷದಲ್ಲಿ ಸೋಲಾರ್‍ನಿಂದದದದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಈಗಾಗಲೇ ಕುಸುಮ್ ಯೋಜನೆಯಡಿ ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿದ್ದು ಸೋಲಾರ್ ಪ್ಯಾನಲ್ ಅಳವಡಿಕೆ, ವಿದ್ಯುತ್ ಉತ್ಪಾದನೆ ಹಂತ, ಭೂಮಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದ್ದು ಬರುವ ಏಪ್ರಿಲ್‍ನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಗ್ರಿಡ್‍ಗೆ ಕಳುಹಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

3000 ಪವರ್ ಮ್ಯಾನ್ ನೇಮಕ

ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇನ್ನಷ್ಟು ಗುಣಮಟ್ಟವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಇದರಲ್ಲಿ 1;5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಿ ಅಂತಿಮವಾಗಿ ಅತ್ಯಂತ ಪಾರದರ್ಶಕವಾಗಿ ಮೀಸಲಾತಿ ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕಾತಿ ನಡೆಯಲಿದೆ. ಆದರೆ ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ, ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದರು.

ಎಸ್ಕಾಂಗಳು ನಷ್ಟದಲ್ಲಿಲ್ಲ

ಇಂಧನ ಇಲಾಖೆಯಲ್ಲಿನ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ, ಆದರೆ ಸರ್ಕಾರದಿಂದ ಸಾಕಷ್ಟು ಹಣ ಬರಬೇಕಾಗಿದೆ. ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಕಂಪನಿಗಳಿಗೆ ಬರಬೇಕಾದ ಹಣ ಬಾಕಿ ಇದೆ. ಗ್ರಾಮ ಪಂಚಾಯಿತಿಗಳು ಸ್ವಂತವಾಗಿ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳುವ ಯೋಜನೆ ಇದ್ದು ದಾವಣಗೆರೆ ಜಿಲ್ಲೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ಉದ್ದೇಶಿಸಿ ಇದನ್ನು ಪೈಲೆಟ್ ಕಾರ್ಯಕ್ರಮವಾಗಿ ರೂಪಿಸಲಾಗುತ್ತದೆ. ಪಂಚಾಯಿತಿಗಳು ಕುಡಿಯುವ ನೀರು ಪೂರೈಕೆ, ಬೀದಿದೀಪಗಳಿಗೆ ಅಗತ್ಯವಿರುವ ವಿದ್ಯುತ್‍ನ್ನು ಉತ್ಪಾದನೆ ಮಾಡಿಕೊಂಡು ಸ್ವಾವಲಂಬಿಯಾಗಬೇಕು. ಇದಕ್ಕಾಗಿ 400 ಎಕರೆ ಜಾಗವನ್ನು ಗುರುತಿಸಿ ಸೋಲಾರ್ ಪ್ಯಾನಲ್ ಅಳವಡಿಸಿ ಗ್ರಿಡ್‍ಗೆ ವಿದ್ಯುತ್ ನೀಡಿ ಅಷ್ಟೆ ವಿದ್ಯುತ್‍ನ್ನು ವಾಪಸ್ ನೀಡಲಾಗುತ್ತದೆ. ಇದರಿಂದ ವಿದ್ಯುತ್ ಉಳಿತಾಯವಾಗಲಿದೆ ಮತ್ತು ಪಂಚಾಯಿತಿಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದರು.

ವಿದ್ಯುತ್ ದರ ಪರಿಷ್ಕರಣೆ ಕೆಇಆರ್‍ಸಿಗೆ

ಎಲ್ಲಾ ಎಸ್ಕಾಂಗಳ ವಿದ್ಯುತ್ ದರ ಏರಿಕೆಯ ನಿರ್ಧಾರವನ್ನು ಕೆಇಆರ್‍ಸಿ ಮಾಡಲಿದೆ. ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆಯುವ ಮೂಲಕ ದರ ಏರಿಕೆ ನಿರ್ಣಯಗಳನ್ನು ಕೆಇಆರ್‍ಸಿ ನಿರ್ಧರಿಸಲಿದೆ. ಯಾರದೂ ಕೂಡ ಹಸ್ತಕ್ಷೇಪ ಇರುವುದಿಲ್ಲ, ಕಳೆದ ವರ್ಷ ಯಾವುದೇ ವಿದ್ಯುತ್ ದರ ಏರಿಕೆ ಮಾಡಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಗೃಹಜ್ಯೋತಿ

ಸರ್ಕಾರದ ಗ್ಯಾರಂಟಿ ಯೋಜನೆಗಳೊಂದಾದ ಗೃಹಜ್ಯೋತಿ ಯೋಜನೆ ಎಲ್ಲಾ ವರ್ಗದ ಜನರಿಗೂ ಅನ್ವಯಿಸಲಿದ್ದು 200 ಯುನಿಟ್ ವರೆಗೆ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ನೀಡಲಾಗುತ್ತದೆ. ಇದನ್ನು ಅವರು ವರ್ಷದಲ್ಲಿ ಉಪಯೋಗಿಸುವ ಯುನಿಟ್‍ಗಳನ್ನಾಧರಿಸಿ ಹೆಚ್ಚುವರಿಯಾಗಿ ಶೇ 10 ರಷ್ಟು ಸೇರಿಸಿ ಬಳಕೆಯ ಯುನಿಟ್ ನಿಗದಿಯಾಗುತ್ತದೆ. ಆದರೆ 200 ಯುನಿಟ್ ನಂತರ 1 ಯುನಿಟ್ ಹೆಚ್ಚಾದರೂ ವಿದ್ಯುತ್ ದರದಂತೆ ಬಿಲ್ ಪಾವತಿಸಬೇಕಾಗುತ್ತದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ನೊಂದಣಿಯಾದ 433897 ಆರ್.ಆರ್.ಸಂಖ್ಯೆಗಳಿದ್ದು ವಿದ್ಯುತ್ ಸಂಪರ್ಕ ಪಡೆದ ಸ್ಥಾವರಗಳಲ್ಲಿ ಶೇ 88.93 ರಷ್ಟು ಗೃಹಜ್ಯೋತಿಯಲ್ಲಿವೆ. ಈ ಸ್ಥಾವರಗಳಿಗೆ 2023 ರ ಆಗಸ್ಟ್ ನಿಂದ 2024 ರ ಡಿಸೆಂಬರ್ ಅಂತ್ಯದವರೆಗೆ 309 ಕೋಟಿಯಷ್ಟು ಹಣವನ್ನು ಗ್ರಾಹಕರಿಗೆ ಸಬ್ಸಿಡಿ ನೀಡಿದ್ದು ಸರ್ಕಾರ ಇದನ್ನು ಭರಿಸಿದೆ ಎಂದರು.

ರೈತರಿಗೆ 7 ಗಂಟೆ ವಿದ್ಯುತ್

ರೈತರ ಕೃಷಿ ಪಂಪ್ ಸೆಟ್‍ಗಳಿಗೆ ದಿನದಲ್ಲಿ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ದಾವಣಗೆರೆ ಜಿಲ್ಲೆ ಆನಗೋಡು, ಮಾಯಕೊಂಡ ಭಾಗದಲ್ಲಿ 3 ಅಥವಾ 4 ಗಂಟೆಗಳ ಕಾಲ ಮಾತ್ರ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ನೀಡಲಾಗುತ್ತದೆ ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿದಾಗ ಎಲ್ಲಾ ರೈತರಿಗೂ ದಿನದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸರ್ಕಾರದ ನೀತಿಯಾಗಿದ್ದು ಅದರಂತೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು. ಓವರ್ ಲೋಡಿಂಗ್ ಆದರೆ ಅದನ್ನು ಬೇರೆಡೆ ವರ್ಗಾಯಿಸಿ 7 ಗಂಟೆ ಕೃಷಿ ಪಂಪ್‍ಸೆಟ್‍ಗೆ ವಿದ್ಯುತ್ ನೀಡಲೇಬೇಕೆಂದು ಸೂಚನೆ ನೀಡಿದರು.

ಪಂಪ್‍ಸೆಟ್‍ಗಳಿಗೆ ಶೀಘ್ರ ಸಂಪರ್ಕಕ್ಕೆ ಕ್ರಮ

ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 2004 ರಿಂದಲೂ ಅಕ್ರಮ-ಸಕ್ರಮ ಎಂಬ ಕಾರ್ಯಕ್ರಮದಡಿ ಅನಧಿಕೃತ ಸಂಪರ್ಕವನ್ನು ಸಕ್ರಮ ಮಾಡುತ್ತಾ ಬರಲಾಗಿದೆ. ಇದರಡಿ ಮೂಲಭೂತ ಸೌಕರ್ಯದಡಿ ಮಾರ್ಗ, ಟಿಸಿ ಅಳವಡಿಕೆ ಮಾಡಲಾಗಿದೆ. ಬಾಕಿ ಇರುವ 4946 ಪಂಪ್‍ಸೆಟ್‍ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್ ಕರೆಯಲಾಗಿದೆ. ರೈತರು ಸ್ವಂತವಾಗಿ ಮೂಲಭೂತ ಸೌಕರ್ಯ ಮಾಡಿಕೊಂಡು ಕೃಷಿ ಪಂಪ್‍ಸೆಟ್‍ಗಳಿಗೆ ತಕ್ಷಣವೇ ಸಂಪರ್ಕ ಪಡೆಯಲು ಹಾಗೂ ಇಲಾಖೆಯಿಂದ ಮೂಲಭೂತ ಸೌಕರ್ಯಕ್ಕಾಗಿ ಸರತಿಯಲ್ಲಿ ಕಾಯುವ ಎರಡು ಅವಕಾಶಗಳನ್ನು ಮಾಡಿಕೊಟ್ಟಲ್ಲಿ ಸ್ವಂತವಾಗಿ ಮಾಡಿಕೊಳ್ಳುವ ರೈತರಿಗೆ ಅನುಕೂಲವಾಗುತ್ತದೆ ಎಂಬ ಚಿಂತನೆ ಮಾಡಲಾಗಿದೆ ಎಂದರು.

ಕಸುಮ್-ಬಿ

ಕುಸುಮ್ ಬಿ ಯೋಜನೆಯಡಿ ರೈತರ ಪಂಪ್‍ಸೆಟ್‍ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿದೆ. 7.5 ಹೆಚ್‍ಪಿ ವರೆಗೆ ಅವಕಾಶ ಇದ್ದು ರೈತರು ಶೇ 20 ರಷ್ಟು ವಂತಿಗೆಯನ್ನು ಕಟ್ಟಬೇಕು. ಕೇಂದ್ರ ಶೇ 30 ಹಾಗೂ ರಾಜ್ಯ ಶೇ 50 ರಷ್ಟು ಸಹಾಯಧನ ಘಟಕ ವೆಚ್ಚಕ್ಕೆ ನೀಡಲಿದೆ. ಮತ್ತು ಕುಸುಮ್-ಸಿ ಯೋಜನೆಯಡಿ ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಗ್ರಿಡ್‍ಗೆ ಪೂರೈಕೆ ಮಾಡುವುದಾಗಿದೆ. ರೈತರು ಸೋಲಾರ್ ಪಂಪ್‍ಸೆಟ್ ಅಳವಡಿಕೆಗೆ ಮುಂದೆ ಬಂದಲ್ಲಿ ಹೆಚ್ಚು ಅನುಕೂಲವಾಗಲಿದೆ ಎಂದರು.

ಸಭೆಯಲ್ಲಿ ಶಾಸಕರಾದ ಕೆ.ಎಸ್.ಬಸವಂತಪ್ಪ, ಲತಾ ಮಲ್ಲಿಕಾರ್ಜುನ್, ಬಿ.ದೇವೇಂದ್ರಪ್ಪ, ಕೆಪಿಟಿಸಿಎಲ್ ಎಂಡಿ ಪಂಕಜ್‍ಕುಮಾರ್ ಪಾಂಡೆ, ಬೆಸ್ಕಾಂ ಎಂಡಿ ಡಾ; ಶಿವಶಂಕರ್ ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಪಾಟೀಲ್ ಹಾಗೂ ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.

ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)

ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.

ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.

ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.

ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.

ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್‌ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.

ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.

ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending