Connect with us

ದಿನದ ಸುದ್ದಿ

ಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್‍ನಲ್ಲಿ ಅಂತ್ಯ ಸಂಸ್ಕಾರ

Published

on

ಸುದ್ದಿದಿನ,ದಾವಣಗೆರೆ:ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ ಸೋಮವಾರ ಸಂಜೆ ಜರುಗಿತು.

ಡಾ; ಶಾಮನೂರು ಶಿವಶಂಕರಪ್ಪನವರಿಗೆ 95 ವರ್ಷವಾಗಿದ್ದು ವಯೋಸಹಜ ಅನಾರೋಗ್ಯದಿಂದ ಡಿಸೆಂಬರ್ 14 ರಂದು ನಿಧನ ಹೊಂದಿದ್ದರು. 6 ಭಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ಸುಧೀರ್ಘ ರಾಜಕೀಯ ಸೇವೆಯಲ್ಲಿದ್ದ ಇವರು ರಾಜ್ಯ ಸೇರಿದಂತೆ ದಾವಣಗೆರೆಗೆ ಹೊಸ ರೂಪಕೊಟ್ಟಿದ್ದರು.
ಸೋಮವಾರ ಬೆಳಗ್ಗೆ 7.30 ಗಂಟೆಯಿಂದ ಪಾರ್ಥಿವ ಶರೀರಕ್ಕೆ ಸ್ವಗೃಹದಲ್ಲಿ ಕುಟುಂಬಸ್ಥರ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ವಿಧಿ ವಿಧಾನಗಳು ನಡೆದು, ಮಧ್ಯಾಹ್ನದಿಂದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ಅಂತಿಮ ದರ್ಶನ ಪಡೆದರು.

ಮಧ್ಯಾಹ್ನ 3.30 ರಿಂದ ಹೈಸ್ಕೂಲ್ ಮೈದಾನದಿಂದ ಹೊರಟು ಹಳೇ ದಾವಣಗೆರೆ ಮಂಡಿಪೇಟೆ, ಕಾಯಿಪೇಟೆ, ಅರಳಿವೃತ್ತದ ಮೂಲಕ ಕಲ್ಲೇಶ್ವರ ಮಿಲ್‍ಗೆ ಪಾರ್ಥಿವ ಶರೀರ ತಲುಪಿತು. ಸಂಜೆ 4.30 ರಿಂದ ಅಂತಿಮ ವಿಧಿ ವಿಧಾನಗಳು ನಡೆದವು.

ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಉಪ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು, ಇಂಧನ ಸಚಿವರಾದ ಕೆ.ಜೆ.ಜಾರ್ಜ್‍ರವರು, ಸಮಾಜ ಕಲ್ಯಾಣ ಸಚಿವರಾದ ಡಾ; ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ.ಎಸ್.ಪಾಟೀಲ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಸೇರಿದಂತೆ ಶಾಸಕರು ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.

ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಪಾರ್ಥಿವ ಶರೀರಕ್ಕೆ ಹೊದಿಸಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿ ಅಂತಿಮವಾಗಿ ಶೋಕ ವ್ಯಕ್ತಪಡಿಸಲಾಯಿತು. ರಾಷ್ಟ್ರಧ್ವಜವನ್ನು ಅವರ ಪುತ್ರರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ಪೂಜೆ, ವಿಧಿ, ವಿಧಾನಗಳೊಂದಿಗೆ ಪಾರ್ಥಿವ ಶರೀರವನ್ನು ಐಕ್ಯ ಮಂಟಪದಲ್ಲಿ ಇಡಲಾಯಿತು.

ಡಾ; ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸೊಸೆ ಹಾಗೂ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಇನ್ನಿಬ್ಬರು ಪುತ್ರರಾದ ಎಸ್.ಎಸ್.ಬಕ್ಕೇಶ್, ಎಸ್.ಎಸ್.ಗಣೇಶ್ ಸೇರಿದಂತೆ ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಸ್.ಆರ್.ಬೊಮ್ಮಾಯಿ, ಗೃಹ ಸಚಿವರಾದ ಜಿ.ಪರಮೇಶ್ವರ್, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಬಿ.ಜೆ.ಪಿ.ಪಕ್ಷದ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಅಂತಿಮ ದರ್ಶನ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

Published

on

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.

ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.

ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.

ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending