ದಿನದ ಸುದ್ದಿ
ಸೋಶಿಯಲ್ ಮೀಡಿಯಾ ಪೋಸ್ಟ್‌ಗೆ ಕೇಸ್, ಉಡುಪಿಯಿಂದ ವ್ಯಕ್ತಿಯನ್ನು ಠಾಣೆಗೆ ಕರೆತಂದ ಕ್ರಮಕ್ಕೆ ಹೈಕೋರ್ಟ್ ಗರಂ
ಸುದ್ದಿದಿನ,ಬೆಂಗಳೂರು: ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಕಾರ್ಯಕ್ರಮ ರದ್ದಾದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯನ್ನು ವಿಚಾರಣೆ ಹೆಸರಿನಲ್ಲಿ ಠಾಣೆಗೆ ಕರೆತಂದ ವೈಟ್‌ಫೀಲ್ಡ್ ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣ ರದ್ದು ಕೋರಿ ಮೋಹನ್‌ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೊಲೀಸ್ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದೆ.
http://Visit : www.suddidina.com
ನ್ಯಾಯಾಲಯದ ಮುಂದೆ ಡಿಸಿಪಿ ಸೈದುಲು ಅಡಾವತ್, ಎಸಿಪಿ ರೀನಾ ಸುವರ್ಣ ಹಾಗೂ ತನಿಖಾಧಿಕಾರಿ ಹಾಜರಾಗಿದ್ದರು. ಈ ವೇಳೆ ಪೊಲೀಸ್ ಠಾಣೆಯ ಕಾರ್ಯವೈಖರಿ, ಬಂಧನದ ಕ್ರಮ ಮತ್ತು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ ನ್ಯಾಯಪೀಠ ಹಲವು ಪ್ರಶ್ನೆಗಳನ್ನು ಕೇಳಿತು.
‘ವೈಟ್‌ಫೀಲ್ಡ್ ಠಾಣೆ ಡಾರ್ಕ್‌ಫೀಲ್ಡ್ ಆಗಲಿ’
ವೈಟ್‌ಫೀಲ್ಡ್ ಠಾಣೆಯಲ್ಲಿ ವಿದ್ಯುತ್ ಹಾಗೂ ಸಿಸಿಟಿವಿ ವ್ಯವಸ್ಥೆ ಕುರಿತ ವಿಚಾರವನ್ನೂ ನ್ಯಾಯಪೀಠ ಪ್ರಸ್ತಾಪಿಸಿತು. ಠಾಣೆಯ ಚಟುವಟಿಕೆಗಳೇ ಅಂಧಕಾರದಲ್ಲಿವೆ ಎಂದು ವ್ಯಂಗ್ಯವಾಡಿದ ನ್ಯಾಯಮೂರ್ತಿಗಳು, ‘ವೈಟ್‌ಫೀಲ್ಡ್ ಠಾಣೆಯನ್ನು ಡಾರ್ಕ್‌ಫೀಲ್ಡ್ ಠಾಣೆಯನ್ನಾಗಿ ಬದಲಾಯಿಸಿಕೊಳ್ಳಿ’ ಎಂದು ಕಿಡಿಕಾರಿದರು.
ಉಡುಪಿಗೆ ತೆರಳಿ ಮೋಹನ್‌ಗೌಡರನ್ನು ವಶಕ್ಕೆ ಪಡೆದಿದ್ದೇಕೆ, ಬೆಳಗಿನ ಜಾವ 2 ಗಂಟೆಗೆ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಂಡಿದ್ದೇಕೆ ಎಂಬುದರ ಕುರಿತು ಅಧಿಕಾರಿಗಳಿಂದ ನ್ಯಾಯಪೀಠ ವಿವರಣೆ ಕೇಳಿತು.
ಡಿಸಿಪಿ ಪರವಾಗಿ, ಮೋಹನ್‌ಗೌಡ ಹಲವು ಟ್ವೀಟ್‌ಗಳನ್ನು ಮಾಡಿದ್ದರು. ಅವರನ್ನು ಬಂಧಿಸಿರಲಿಲ್ಲ, ಫೋನ್ ಮಾಡಿದರೂ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಅವರು ಕಾರಿನಲ್ಲಿ ಬಂದಿದ್ದರು. ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದು ಉತ್ತರಿಸಲಾಯಿತು.
‘ಯೂನಿಫಾರ್ಮ್ ಇದ್ದರೆ ಏನು ಬೇಕಾದರೂ ಮಾಡಬಹುದೇ?’
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಾತ್ರಕ್ಕೆ ಪೊಲೀಸರು ಮನಬಂದಂತೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. ಯೂನಿಫಾರ್ಮ್ ಧರಿಸಿರುವ ಕಾರಣಕ್ಕೆ ನಾಗರಿಕರ ಸ್ವಾತಂತ್ರ್ಯ ಕಸಿಯಲು ಸಾಧ್ಯವಿಲ್ಲ ಎಂದು ಕೋರ್ಟ್ ಎಚ್ಚರಿಸಿತು.
ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಕುರಿತು ಕ್ರಮ ಕೈಗೊಳ್ಳುವಾಗ ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪೊಲೀಸರು ತಮ್ಮನ್ನು ತಾವೇ ಕಾನೂನು ಎಂದು ಭಾವಿಸಬಾರದು. ಬಂಧನದ ಅಧಿಕಾರವನ್ನು ವಿವೇಚನೆಯಿಲ್ಲದೆ ಬಳಸಬಾರದು ಎಂದು ನ್ಯಾಯಪೀಠ ತಿಳಿಸಿತು.
ಪೊಲೀಸ್ ಠಾಣೆಗಳಲ್ಲಿ CCTV ಆಡಿಟ್‌ಗೆ ಸೂಚನೆ
ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ವ್ಯವಸ್ಥೆ ಮತ್ತು ಯುಪಿಎಸ್ ಬ್ಯಾಕಪ್ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ರಾಜ್ಯಮಟ್ಟದ ಆಡಿಟ್ ನಡೆಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.
ಅಧಿಕಾರ ದುರುಪಯೋಗ ಅಥವಾ ನ್ಯಾಯಾಲಯದ ಆದೇಶ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ ನಡೆಸಬೇಕು. ಪೊಲೀಸ್ ಠಾಣೆಗಳಲ್ಲಿ ಸುಪ್ರೀಂಕೋರ್ಟ್ ತೀರ್ಪುಗಳ ಕುರಿತು ಅರಿವು ಮೂಡಿಸಬೇಕು ಎಂದು ಸೂಚಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ
ಕುನಾಲ್ ಕಾಮ್ರಾ ಶೋ ವಿರೋಧಿಸಿ ದೂರುಗಳು ಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಈ ಬೆಳವಣಿಗೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಮೋಹನ್‌ಗೌಡ ವಿರುದ್ಧ ವೈಟ್‌ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಉಡುಪಿಯಿಂದ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದ ಕ್ರಮ ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆಆರ್.ಐ.ಡಿ.ಎಲ್ ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್ಲೈನ್ ಕೌನ್ಸಿಲಿಂಗ್ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.
ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.
ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



