ದಿನದ ಸುದ್ದಿ
₹4 ಕೋಟಿ ಯೋಜನೆಗೆ ಮಹಿಳಾ ಚಾಲಕರ ಕೊರತೆ; ಸುರಕ್ಷತೆ ಮತ್ತು ಸ್ವಾವಲಂಬನೆಯ ಕನಸು ಸಾಕಾರವಾಗುವುದೇ?
ಸುದ್ದಿದಿನ,ಹುಬ್ಬಳ್ಳಿ: ಮಹಿಳೆಯರು ಮತ್ತು ಬಾಲಕಿಯರಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆ ಕಲ್ಪಿಸುವುದರ ಜತೆಗೆ ಮಹಿಳೆಯರಿಗೆ ಸ್ವಾವಲಂಬಿ ಉದ್ಯೋಗ ಒದಗಿಸುವ ಉದ್ದೇಶದಿಂದ ಹು-ಧಾ ಮಹಾನಗರ ಪಾಲಿಕೆ ರೂಪಿಸಿರುವ ‘ಪಿಂಕ್ ಆಟೋ’ ಯೋಜನೆ ಆರಂಭಕ್ಕೂ ಮುನ್ನವೇ ಸವಾಲಿಗೆ ಸಿಲುಕಿದೆ. ಯೋಜನೆಯಡಿ ಮಹಿಳೆಯರಿಗೆ ಆಟೋ ಒದಗಿಸಲು ಪಾಲಿಕೆ ಸಿದ್ಧವಾಗಿದ್ದರೂ, ಇದುವರೆಗೆ ಒಂದೇ ಒಂದು ಅರ್ಜಿ ಬಾರದಿರುವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಹು-ಧಾ ಅವಳಿ ನಗರದ 82 ವಾರ್ಡ್ಗಳಿಗೆ ತಲಾ ಒಂದು ಪಿಂಕ್ ಆಟೋ ನೀಡುವ ಉದ್ದೇಶದಿಂದ ಪಾಲಿಕೆ ಬರೋಬ್ಬರಿ ₹4 ಕೋಟಿ ಅನುದಾನ ಮೀಸಲಿಟ್ಟಿದೆ. ಎರಡು ತಿಂಗಳ ಹಿಂದೆಯೇ ಸಾಮಾನ್ಯ ಸಭೆಯಲ್ಲಿ ಈ ಕುರಿತು ಠರಾವನ್ನೂ ಅಂಗೀಕರಿಸಲಾಗಿದೆ. ಆದರೆ ಯೋಜನೆಯ ಸದುಪಯೋಗ ಪಡೆಯಲು ಮಹಿಳಾ ಚಾಲಕರು ಮುಂದೆ ಬಾರದಿರುವುದು ಅನುಷ್ಠಾನಕ್ಕೆ ದೊಡ್ಡ ಅಡ್ಡಿಯಾಗಿದೆ.
| ಹೈಲೈಟ್ಸ್: ಮಹಿಳಾ ಸುರಕ್ಷತೆಗೆ ರೂಪಿಸಿದ ಯೋಜನೆಗೆ ಮೊದಲ ಸವಾಲು |
|
http://Visit : www.suddidina.com
ಸುರಕ್ಷಿತ ಪ್ರಯಾಣದ ಜತೆಗೆ ಉದ್ಯೋಗ
ಪಿಂಕ್ ಆಟೋ ಯೋಜನೆಯ ಪ್ರಮುಖ ಉದ್ದೇಶ ಮಹಿಳಾ ಪ್ರಯಾಣಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವುದು. ಮಹಿಳೆಯರೇ ಆಟೋ ಚಾಲಕರಾಗುವುದರಿಂದ ವಿದ್ಯಾರ್ಥಿನಿಯರು, ಹಿರಿಯ ಮಹಿಳೆಯರು ಹಾಗೂ ಇತರ ಮಹಿಳಾ ಪ್ರಯಾಣಿಕರು ಹೆಚ್ಚು ವಿಶ್ವಾಸದಿಂದ ಸಂಚರಿಸಬಹುದು ಎಂಬುದು ಪಾಲಿಕೆಯ ಆಶಯ.
ಇದರ ಜತೆಗೆ ಆಟೋ ಚಾಲನೆಗೆ ಆಸಕ್ತಿ ಹೊಂದಿರುವ ಮಹಿಳೆಯರಿಗೆ ಸ್ವಂತ ಉದ್ಯೋಗದ ಅವಕಾಶ ಕಲ್ಪಿಸಿ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶವೂ ಇದೆ. ಹೀಗಾಗಿ ಇದು ಕೇವಲ ಸಾರಿಗೆ ಯೋಜನೆಯಲ್ಲ; ಮಹಿಳಾ ಸುರಕ್ಷತೆ ಮತ್ತು ಸಬಲೀಕರಣವನ್ನು ಒಟ್ಟಿಗೆ ಗುರಿಯಾಗಿಸಿಕೊಂಡ ಯೋಜನೆಯಾಗಿದೆ.
ಬೆಂಗಳೂರು ಮಾದರಿ, ಹುಬ್ಬಳ್ಳಿಯಲ್ಲಿ ಯಾಕೆ ಹಿನ್ನಡೆ?
ಮಹಿಳೆಯರಿಗಾಗಿ ಪಿಂಕ್ ಆಟೋ ಪರಿಕಲ್ಪನೆ ಈಗಾಗಲೇ ಬೆಂಗಳೂರಿನಲ್ಲಿ ಜಾರಿಯಲ್ಲಿದೆ. ಆದರೆ ಹುಬ್ಬಳ್ಳಿ-ಧಾರವಾಡದಲ್ಲಿ ಅದೇ ಮಾದರಿಯನ್ನು ಅನುಷ್ಠಾನಗೊಳಿಸುವ ಹಂತದಲ್ಲಿ ಮಹಿಳಾ ಚಾಲಕರ ಕೊರತೆ ಎದುರಾಗಿದೆ.
ಅರ್ಜಿ ಸಲ್ಲಿಕೆಯಾಗದಿರುವುದಕ್ಕೆ ಹಲವು ಕಾರಣಗಳಿರಬಹುದು. ಯೋಜನೆಯ ಮಾಹಿತಿ ಮಹಿಳೆಯರಿಗೆ ತಲುಪದಿರುವುದು, ಆಟೋ ಚಾಲನಾ ಪರವಾನಗಿ ಪಡೆಯುವಲ್ಲಿನ ಸಮಸ್ಯೆ, ತರಬೇತಿ ಕೊರತೆ, ಕುಟುಂಬದ ವಿರೋಧ ಅಥವಾ ರಾತ್ರಿ ವೇಳೆ ಸಂಚಾರದ ಕುರಿತ ಆತಂಕವೂ ಕಾರಣವಾಗಿರಬಹುದು.
82 ಆಟೋಗಳ ಕನಸಿಗೆ ಚಾಲಕರು ಎಲ್ಲಿದ್ದಾರೆ?
ಪ್ರತಿ ವಾರ್ಡ್ಗೆ ಒಂದು ಆಟೋ ನೀಡುವ ಮಹತ್ವಾಕಾಂಕ್ಷಿ ಯೋಜನೆ ರೂಪಿಸಿರುವ ಪಾಲಿಕೆ ಇದೀಗ ‘ಆಟೋ ಸಿದ್ಧ, ಚಾಲಕರು ಎಲ್ಲಿದ್ದಾರೆ?’ ಎಂಬ ಪ್ರಶ್ನೆಗೆ ಉತ್ತರ ಹುಡುಕಬೇಕಿದೆ. ಮಹಿಳಾ ಚಾಲಕರೇ ಲಭ್ಯವಾಗದಿದ್ದರೆ ಕೋಟ್ಯಂತರ ರೂಪಾಯಿ ಅನುದಾನ ಮೀಸಲಿಟ್ಟರೂ ಯೋಜನೆಯ ಮೂಲ ಉದ್ದೇಶ ಈಡೇರುವುದು ಕಷ್ಟ.
ಆದ್ದರಿಂದ ಮಹಿಳೆಯರನ್ನು ಯೋಜನೆಯತ್ತ ಸೆಳೆಯಲು ವ್ಯಾಪಕ ಪ್ರಚಾರದ ಅಗತ್ಯವಿದೆ. ಮಹಿಳಾ ಸಂಘಟನೆಗಳು, ಸ್ವಸಹಾಯ ಸಂಘಗಳು, ಕಾಲೇಜುಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮೂಲಕ ಜಾಗೃತಿ ಮೂಡಿಸಬೇಕಿದೆ. ಜತೆಗೆ ಚಾಲನಾ ತರಬೇತಿ, ಪರವಾನಗಿ ಪಡೆಯಲು ಮಾರ್ಗದರ್ಶನ ಮತ್ತು ಯೋಜನೆಯ ನಿಯಮಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದರೆ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಯೋಜನೆಗೆ ಹೊಸ ವೇಗ ನೀಡುವುದೇ ಪಾಲಿಕೆ?
ಮಹಿಳೆಯರಿಗೆ ಉಚಿತ ಆಟೋ ನೀಡುವ ಯೋಜನೆ ಕಾಗದದ ಮೇಲಷ್ಟೇ ಉಳಿಯದೆ, ನಿಜವಾದ ಫಲಾನುಭವಿಗಳಿಗೆ ತಲುಪಬೇಕಾದರೆ ಪಾಲಿಕೆ ಈಗಲೇ ಕಾರ್ಯತಂತ್ರ ರೂಪಿಸಬೇಕಿದೆ. ಸುರಕ್ಷಿತ ನಗರ ಸಾರಿಗೆ ಹಾಗೂ ಮಹಿಳಾ ಸ್ವಾವಲಂಬನೆಯ ಎರಡು ಗುರಿಗಳನ್ನು ಹೊಂದಿರುವ ₹4 ಕೋಟಿ ಯೋಜನೆಗೆ ಚಾಲಕರ ಕೊರತೆ ಎಂಬ ಮೊದಲ ಅಡೆತಡೆ ಎದುರಾಗಿದೆ. ಈ ಸಮಸ್ಯೆಯನ್ನು ಹೇಗೆ ನಿವಾರಿಸುತ್ತದೆ ಎಂಬುದೇ ಈಗ ಕುತೂಹಲದ ಪ್ರಶ್ನೆಯಾಗಿದೆ.
“ಪ್ರತಿ ವಾರ್ಡ್ಗೆ ತಲಾ ಒಂದರಂತೆ ಪಿಂಕ್ ಆಟೋ ನೀಡುವ ನಿಟ್ಟಿನಲ್ಲಿ ಪಾಲಿಕೆ ಯೋಜನೆ ರೂಪಿಸಿಕೊಂಡಿದೆ. ಸದ್ಯದಲ್ಲಿಯೇ ಟೆಂಡರ್ ಮೂಲಕ ಆಟೋ ವಿತರಕರನ್ನು ಆಹ್ವಾನಿಸಲಾಗುವುದು. ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಮಹಿಳೆಯರಿಗೆ ಪಿಂಕ್ ಆಟೋ ವಿತರಿಸಲಾಗುವುದು. ಸದ್ಯ ಅವಳಿ ನಗರದಲ್ಲಿ ಮಹಿಳಾ ಆಟೋ ಚಾಲಕರ ಕೊರತೆ ಇರುವುದು ನಿಜ.”
– ಡಾ.ರುದ್ರೇಶ ಘಾಳಿ, ಆಯುಕ್ತರು, ಹು-ಧಾ ಮಹಾನಗರ ಪಾಲಿಕೆ
“ಪಾಲಿಕೆ ಮಹಿಳೆಯರಿಗೆ ಉಚಿತವಾಗಿ ಪಿಂಕ್ ಆಟೋ ನೀಡಲು ಸಿದ್ಧವಿದೆ, ಆದರೆ ಪಾಲಿಕೆಯ 82 ವಾರ್ಡ್ಗಳಿಂದ ಇಲ್ಲಿಯವರೆಗೆ ಒಂದೇ ಒಂದು ಅರ್ಜಿ ಸಹ ಬಂದಿಲ್ಲ. ಇದು ಕೇವಲ ಮಹಿಳೆಯರಿಗೆ ರೂಪಿಸುವ ಯೋಜನೆಯಾಗಿದ್ದು, ಶತಾಗತಾಯ ಅನುಷ್ಠಾನಗೊಳಿಸುವ ಪ್ರಯತ್ನ ಮಾಡಲಾಗುವುದು. ಈ ಕುರಿತು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು. ಅರ್ಹ ಫಲಾನುಭವಿಗಳನ್ನು ಹುಡುಕಿ ಅವರಿಗೆ ಆಟೋ ಚಾಲನಾ ತರಬೇತಿ ಸಹ ಕಲ್ಪಿಸಲಾಗುವುದು.”
-ದುರ್ಗಮ್ಮ ಬಿಜವಾಡ, ಮೇಯರ್, ಹು-ಧಾ ಮಹಾನಗರ ಪಾಲಿಕೆ

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243



