ದಿನದ ಸುದ್ದಿ
September 1 Rules Change: ಸೆ.1ರಿಂದ ಬದಲಾದ 6 ಪ್ರಮುಖ ನಿಯಮಗಳು; ವಿಮಾನ ಪ್ರಯಾಣದಿಂದ ತೆರಿಗೆ, LPG, ಗೋಲ್ಡ್ ಬಾಂಡ್ವರೆಗೆ ಹೊಸ ರೂಲ್ಸ್!
ಸುದ್ದಿದಿನ,ಹೊಸದಿಲ್ಲಿ: ಪ್ರತಿ ತಿಂಗಳ ಆರಂಭದಲ್ಲಿ ಹಣಕಾಸು, ಬ್ಯಾಂಕಿಂಗ್, ತೆರಿಗೆ ಮತ್ತು ಗ್ರಾಹಕ ಸೇವೆಗಳಿಗೆ ಸಂಬಂಧಿಸಿದಂತೆ ಹಲವು ಬದಲಾವಣೆಗಳು ಜಾರಿಗೆ ಬರುತ್ತವೆ. ಅದರಂತೆ 2026ರ ಸೆಪ್ಟೆಂಬರ್ 1ರಿಂದಲೂ ಹಲವು ಪ್ರಮುಖ ನಿಯಮಗಳು ಮತ್ತು ಗಡುವುಗಳು ಅನ್ವಯವಾಗುತ್ತಿವೆ. ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ನಿರ್ಗಮನ ಪ್ರಕ್ರಿಯೆಯಿಂದ ಹಿಡಿದು ವಾಣಿಜ್ಯ LPG ಸಿಲಿಂಡರ್, ಮುಂಗಡ ತೆರಿಗೆ, ತೆರಿಗೆ ಆಡಿಟ್, ಸಾವರಿನ್ ಗೋಲ್ಡ್ ಬಾಂಡ್ ಹಾಗೂ ಡಿಮ್ಯಾಟ್-ಮ್ಯೂಚುವಲ್ ಫಂಡ್ ನಾಮಿನೇಷನ್ವರೆಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳಾಗಿವೆ.
ಹೈಲೈಟ್ಸ್: ಸೆಪ್ಟೆಂಬರ್ 1ರಿಂದ ಹೊಸ ನಿಯಮಗಳ ಜಾರಿ |
|
http://Visit : www.suddidina.com
ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ರಿಲೀಫ್
ಸೆಪ್ಟೆಂಬರ್ 1ರಿಂದ ಭಾರತದಿಂದ ಅಂತಾರಾಷ್ಟ್ರೀಯ ವಿಮಾನದಲ್ಲಿ ಪ್ರಯಾಣಿಸುವವರಿಗೆ ಇಮಿಗ್ರೇಷನ್ ಕೌಂಟರ್ನಲ್ಲಿ ಬೋರ್ಡಿಂಗ್ ಪಾಸ್ಗೆ ಮುದ್ರೆ ಹಾಕಿಸಿಕೊಳ್ಳುವ ಅಗತ್ಯವಿಲ್ಲ. ಮೊಬೈಲ್ನಲ್ಲಿರುವ ಎಲೆಕ್ಟ್ರಾನಿಕ್ ಬೋರ್ಡಿಂಗ್ ಪಾಸ್ ಅಥವಾ ಅದರ ಮುದ್ರಿತ ಪ್ರತಿಯನ್ನು ಬಳಸಬಹುದು. ಇದರಿಂದ ವಿಮಾನ ನಿಲ್ದಾಣದಲ್ಲಿ ನಿರ್ಗಮನ ಪ್ರಕ್ರಿಯೆ ಇನ್ನಷ್ಟು ಸರಳವಾಗುವ ನಿರೀಕ್ಷೆಯಿದೆ.
ಕಮರ್ಷಿಯಲ್ LPG ಸಿಲಿಂಡರ್ ದರ ಏರಿಕೆ
ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಬಳಕೆದಾರರಿಗೆ ಮತ್ತೊಂದು ಹೊರೆ ಎದುರಾಗಿದೆ. 19 ಕೆ.ಜಿ. ವಾಣಿಜ್ಯ LPG ಸಿಲಿಂಡರ್ ದರವನ್ನು ಹಲವು ನಗರಗಳಲ್ಲಿ ₹9.50ರಿಂದ ₹11.50ರವರೆಗೆ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಪರಿಷ್ಕೃತ ದರ ₹2,831 ಎಂದು ವರದಿಯಾಗಿದೆ. ಇದರಿಂದ ವಾಣಿಜ್ಯ ಅಡುಗೆ ಅನಿಲ ಅವಲಂಬಿತ ಉದ್ಯಮಗಳ ವೆಚ್ಚದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಮುಂಗಡ ತೆರಿಗೆ ಪಾವತಿಗೆ ಸೆಪ್ಟೆಂಬರ್ 15 ಗಡುವು
2026-27ರ ಆರ್ಥಿಕ ವರ್ಷಕ್ಕೆ ಮುಂಗಡ ತೆರಿಗೆ ಪಾವತಿಸಬೇಕಾದ ತೆರಿಗೆದಾರರಿಗೆ ಸೆಪ್ಟೆಂಬರ್ 15 ಪ್ರಮುಖ ದಿನಾಂಕವಾಗಿದೆ. ಒಟ್ಟು ಅಂದಾಜು ತೆರಿಗೆಯ ಕನಿಷ್ಠ 45% ಮೊತ್ತವನ್ನು ಈ ಗಡುವಿನೊಳಗೆ ಪಾವತಿಸಬೇಕಾಗುತ್ತದೆ. ಬಡ್ಡಿ, ಬಾಡಿಗೆ, ವೃತ್ತಿಪರ ಶುಲ್ಕ ಅಥವಾ ಬಂಡವಾಳ ಲಾಭದಂತಹ ಆದಾಯ ಹೊಂದಿರುವವರು ತಮ್ಮ ತೆರಿಗೆ ಬಾಧ್ಯತೆಯನ್ನು ಪರಿಶೀಲಿಸಬೇಕು.
ಗಡುವು ತಪ್ಪಿದರೆ ಆದಾಯ ತೆರಿಗೆ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಬಡ್ಡಿ ಅನ್ವಯವಾಗುವ ಸಾಧ್ಯತೆಯಿದೆ.
ತೆರಿಗೆ ಆಡಿಟ್ ವರದಿಗೂ ಡೆಡ್ಲೈನ್
ಆಡಿಟ್ ಕಡ್ಡಾಯವಾಗಿರುವ ಉದ್ಯಮಿಗಳು ಮತ್ತು ಇತರ ತೆರಿಗೆದಾರರು 2026-27ರ ಆರ್ಥಿಕ ವರ್ಷಕ್ಕೆ ಸಂಬಂಧಿಸಿದ ತೆರಿಗೆ ಆಡಿಟ್ ವರದಿಯನ್ನು ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು. ಆಡಿಟ್ಗೆ ಒಳಪಡುವ ಪ್ರಕರಣಗಳಲ್ಲಿ ITR ಸಲ್ಲಿಕೆಗೆ ನಂತರದ ಗಡುವು ಇದ್ದರೂ, ಆಡಿಟ್ ವರದಿಯನ್ನು ಮುಂಚಿತವಾಗಿ ಸಲ್ಲಿಸುವುದು ಕಡ್ಡಾಯವಾಗಿದೆ.
SGB ಹೂಡಿಕೆದಾರರಿಗೆ ಮುಂಚಿತ ರಿಡೆಂಪ್ಶನ್ ಅವಕಾಶ
ಸಾವರಿನ್ ಗೋಲ್ಡ್ ಬಾಂಡ್ ಹೂಡಿಕೆದಾರರಿಗೆ ಸೆಪ್ಟೆಂಬರ್ನಲ್ಲಿ ಕೆಲವು ಸರಣಿಗಳ ಬಾಂಡ್ಗಳನ್ನು ಅವಧಿಗೆ ಮುನ್ನ ರಿಡೀಮ್ ಮಾಡಿಕೊಳ್ಳಲು ಅವಕಾಶವಿದೆ. 2021-22 Series VI, 2020-21 Series VI, 2020-21 Series XII ಮತ್ತು 2019-20 Series X ಸರಣಿಗಳಿಗೆ ಕ್ರಮವಾಗಿ ಸೆಪ್ಟೆಂಬರ್ 7, 8, 9 ಮತ್ತು 11ರಂದು ರಿಡೆಂಪ್ಶನ್ ದಿನಾಂಕಗಳನ್ನು ನಿಗದಿಪಡಿಸಲಾಗಿದೆ.
ಡಿಮ್ಯಾಟ್, ಮ್ಯೂಚುವಲ್ ಫಂಡ್ ಖಾತೆಗಳಿಗೆ ನಾಮಿನಿ ನಿಯಮ
ಹೊಸದಾಗಿ ತೆರೆಯುವ ಸಿಂಗಲ್ ಹೋಲ್ಡರ್ ಡಿಮ್ಯಾಟ್ ಖಾತೆಗಳು ಮತ್ತು ಮ್ಯೂಚುವಲ್ ಫಂಡ್ ಫೋಲಿಯೋಗಳಿಗೆ ನಾಮಿನಿಯನ್ನು ಸೇರಿಸುವುದು ಅಥವಾ ನಾಮಿನಿ ಬೇಡವೆಂದು ಆಯ್ಕೆ ಮಾಡುವುದು ಸಂಬಂಧಿಸಿದ ನಿಯಮಗಳ ಪ್ರಕಾರ ಕಡ್ಡಾಯವಾಗಲಿದೆ. ಹೊಸ ವ್ಯವಸ್ಥೆಯಲ್ಲಿ ಮೂರು ನಾಮಿನಿಗಳನ್ನು ಹೆಸರಿಸಲು ಅವಕಾಶವಿದೆ.
ಹೀಗಾಗಿ ಸೆಪ್ಟೆಂಬರ್ ಆರಂಭದಿಂದಲೇ ಹಣಕಾಸು ವ್ಯವಹಾರ ನಡೆಸುವವರು ತಮ್ಮ ಖಾತೆಗಳು, ತೆರಿಗೆ ಪಾವತಿ, ಹೂಡಿಕೆ ದಾಖಲೆಗಳು ಹಾಗೂ ಅನ್ವಯವಾಗುವ ಗಡುವುಗಳನ್ನು ಪರಿಶೀಲಿಸುವುದು ಸೂಕ್ತ. ಸಣ್ಣ ಬದಲಾವಣೆಯೂ ವೈಯಕ್ತಿಕ ಹಣಕಾಸಿನ ಮೇಲೆ ನೇರ ಪರಿಣಾಮ ಬೀರಬಹುದಾದ ಕಾರಣ, ಅಧಿಕೃತ ಮೂಲಗಳ ಮೂಲಕ ಅಂತಿಮ ನಿಯಮಗಳನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ.

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್ಲೈನ್ ಕೌನ್ಸಿಲಿಂಗ್ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.
ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.
ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.



