ದಿನದ ಸುದ್ದಿ
ರಾಮದುರ್ಗ : ಶಿಥಿಲಗೊಂಡಿರುವ ಶಾಲಾ ಕಟ್ಟಡಗಳು ; ಕಟ್ಟಡಗಳ ನಿರ್ಮಾಣಕ್ಕೆ ನೆರವಾಗದ ಜನಪ್ರತಿನಿಧಿಗಳು : ಇವರಿಗೆ ಅಧಿಕಾರ ಯಾಕ್ ಬೇಕು ಸ್ವಾಮಿ..!
ಸುದ್ದಿದಿನ ಡೆಸ್ಕ್ : ಶಿಕ್ಷಕರ ಕೊರತೆ, ಕೊಠಡಿಗಳ ಸಮಸ್ಯೆ, ಭಯದ ವಾತಾವರಣದಲ್ಲಿ ಪಾಠ, ವಿದ್ಯಾರ್ಥಿಗಳು ಶಿಕ್ಷಕರು ಮತ್ತು ಪಾಲಕರಲ್ಲಿ ಆತಂಕ, ಕೊಠಡಿಗಳ ನಿರ್ಮಾಣಕ್ಕೆ ಅನುದಾನದ ಕೊರತೆಯಿಂದ ಶಿಕ್ಷಣ ವ್ಯವಸ್ಥೆಯ ಮೆಟ್ಟಿಲಾದ ಪ್ರಾಥಮಿಕ ಶಿಕ್ಷಣದ ವ್ಯವಸ್ಥೆ ಮಾತ್ರ ಸಮಸ್ಯೆಗಳ ಸುಳಿಗೆ ಸಿಲುಕಿಕೊಂಡಂತಾಗಿದೆ.
ರಾಮದುರ್ಗ ತಾಲೂಕಿನಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನೊಮ್ಮೆ ನೋಡಿದರೆ, ಸಮಸ್ಯೆಗಳ ಸರಮಾಲೆಯ ನೈಜನತೆಯ ದರ್ಶನವಾಗುತ್ತದೆ. ಅದಕ್ಕೆ ಸೂಕ್ತ ನಿದರ್ಶನವೆಂಬಂತೆ ನಂದಿಹಾಳ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಯೋರ್ವಳ ಮೇಲೆ ಮೇಲ್ಛಾವಣಿಯ ಸಿಮೆಂಟ್ ಹೊದಿಕೆ ಕಳಚಿ ಬಿದ್ದು, ಗಾಯಗಳಾದ ಘಟನೆ ನಡೆದಿದೆ.
ರಾಷ್ಟ್ರದ ಪ್ರಗತಿಗೆ ಶಿಕ್ಷಣ ಪೂರಕವಾಗಲಿದೆ. ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ಎಂದು ಹೇಳತ್ತಿರುವ ಉಭಯ ಸರಕಾರದ ನೀತಿ ಮಾತ್ರ ಇಲ್ಲಿ ಅಪವಾದ ಎಂಬಂತೆ ಬಡ ಪಾಲಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುವಂತಹ ವಾತಾವರಣ ಸೃಷ್ಠಿಯಾಗಿದೆ.
ಶಿಥಿಲಗೊಂಡಿವೆ 113 ಕೊಠಡಿಗಳು
ತಾಲೂಕಿನಲ್ಲಿರುವ 55 ಪ್ರೌಢಶಾಲೆಯಲ್ಲಿ 113 ಕೊಠಡಿಗಳು ಸುಮಾರು ವರ್ಷಗಳಿಂದ ಶಿಥಿಲಾವಸ್ಥೆಯನ್ನು ತಲುಪಿವೆ. ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಕೊಠಡಿಗಳು ಸುಮಾರು 75-100 ವರ್ಷಗಳಷ್ಟು ಹಳೆಯದಾಗಿವೆ. ಆದರೆ ಸರಕಾರ ಮಾತ್ರ ಅವುಗಳ ಪುನರ್ ನಿರ್ಮಾಣಕ್ಕೆ ಅನುದಾನ ಮಾತ್ರ ಬಿಡುಗಡೆ ಮಾಡಿಲ್ಲ. ಪ್ರತಿ ವರ್ಷ ಕೇವಲ 4-5 ಶಾಲೆಗಳ ಕೊಠಡಿಗಳ ನಿರ್ಮಾಣಕ್ಕೆ ವಿವಿಧ ಇಲಾಖೆಗಳ ಮೂಲಕ ಅನುದಾನ ನೀಡುತ್ತಿದೆ. ಆದರೆ ಇದರಿಂದ ಸಮಸ್ಯೆ ಕೊಠಡಿಗಳ ನಿರ್ಮಾಣ ಮಾತ್ರ ಅಸಾಧ್ಯವಾಗಿ ಪರಿಣಮಿಸಿದೆ ಎನ್ನುತ್ತಾರೆ ಅಧಿಕಾರಿಗಳು.
ಸರ್ವ ಶಿಕ್ಷಣ ಅಭಿಯಾನ ಮುಂದುವರಿಕೆಗೆ ಆಗ್ರಹ
ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿಯಲ್ಲಿ 2015-16 ರ ವರೆಗೆ ಶಾಲೆಗೆ ಕಟ್ಟಡ ನಿರ್ಮಾಣಕ್ಕೆ ವಿಶೇಷ ಅನುದಾನ ಹಂಚಿಕೆಯಾಗುತ್ತಿತ್ತು. ಆದರೆ ಯೋಜನೆಗೆ ಕೇಂದ್ರ ಸರಕಾರ ಅನುದಾನ ನೀಡದೇ ಇರುವ ಕಾರಣ ಕೊಠಡಿಗಳ ನಿರ್ಮಾಣ ತಲೆನೋವಾಗಿ ಪರಿಣಮಿಸಿದೆ. ಸರ್ವ ಶಿಕ್ಷಣ ಅಭಿಯಾನವನ್ನು ಮುಂದುವರೆಸಬೇಕು ಎಂಬುವುದು ಶಿಕ್ಷಣ ತಜ್ಞರ ಅಭಿಮತವಾಗಿದೆ. ಸಮರ್ಪಕ ಮಾಹಿತಿ ನೀಡದ ಕ್ಷೇತ್ರ ಶಿಕ್ಷಣಾಧಿಕಾರಿ ತಾಲೂಕಿನಲ್ಲಿರುವ ಶಾಲೆಗಳ ವಿವಿಧ ಸಮಸ್ಯೆ ಹಾಗೂ ಶಿಥಿಲಾವಸ್ಥೆಯ ಕಟ್ಟಡಗಳನ್ನು ಮಾಹಿತಿನ್ನು ಕೇಳಿದರೆ ಸಮರ್ಪಕ ಮಾಹಿತಿ ನೀಡದೇ ಇರುವ ಕ್ರಮ ಮಾತ್ರ ಅವರಿಗೆ ಸೂಕ್ತ ಮಾಹಿತಿ ಇಲ್ಲದ ನಿಷ್ಕಾಳಜಿಯ ಮೇಲ್ವಿಚಾರಣೆಗೆ ಕ್ರಮ ಶಿಕ್ಷಣಾಭಿಮಾನಿಗಳನ್ನು ಬೇಸರಗೊಳ್ಳುವಂತೆ ಮಾಡಿದೆ.
ಇನ್ನಾದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ತಾಲೂಕಿನಲ್ಲಿ ಶಿಥಿಲಗೊಂಡಿರುವ ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ಕೈಗೊಂಡು ವ್ಯಾಸಂಗ ಮಾಡುತ್ತಿರುವ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡುತ್ತಾರಾ? ಎಂದು ಕಾದು ನೋಡಬೇಕಿದೆ.
“ರಾಮದುರ್ಗ ತಾಲೂಕಿನಲ್ಲಿ ಸುಮಾರು 113 ಕೊಠಡಿಗಳ ನಿರ್ಮಾಣಕ್ಕೆ ಹಿಂದಿನ ಶಾಸಕರ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಗೆ ಪ್ರಸ್ತಾವಣೆ ಸಲ್ಲಿಸಿದರೂ ಶಾಸಕರು ಕೊಠಡಿಗಳ ನಿರ್ಮಾಣಕ್ಕೆ ಕಾಳಜಿ ವಹಿಸಿಲ್ಲ. ನಾನು ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸು ಮತ್ತೊಮ್ಮೆ ಸುಮಾರು 84 ಕೋಟಿ ವೆಚ್ಚದಲ್ಲಿ ತಾಲೂಕಿನಲ್ಲಿ ಶಾಲಾ ಕೊಠಡಿಗಳ ನಿರ್ಮಾನಕ್ಕೆ ಪ್ರಸ್ತಾವಣೆ ಸಲ್ಲಿಸಿದ್ದೇನೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ”.
| ಮಹಾದೇವಪ್ಪ ಯಾದವಾಡ, ಶಾಸಕರು ರಾಮದುರ್ಗ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


