ನೆಲದನಿ
ಬಸವಣ್ಣನವರ ಪ್ರಜಾಪ್ರಭುತ್ವ
- ಶರಣ ಸಂಗಮೇಶ ಎನ್ ಜವಾದಿ, ಕೊಡಂಬಲ, ಬೀದರ ಜಿಲ್ಲೆ
ವಚನ ಸಾಹಿತ್ಯ ವಿಶ್ವ ಶ್ರೇಷ್ಠ ಸಾಹಿತ್ಯ,ಪ್ರಜಾಪ್ರಭುತ್ವ ಮೌಲ್ಯಗಳನ್ನು ಸಾರುವ ವಿಶ್ವ ಸಂವಿಧಾನವಾಗಿದ್ದು, ವಚನಗಳಲ್ಲಿರುವ ಅಂಶಗಳು ಸಂವಿಧಾನದ ಚೌಕಟ್ಟಿನಲ್ಲಿ ಕಾಣುತ್ತೇವೆ. ಪ್ರಪಂಚಕ್ಕೆ
ಸಮಾನತೆ ಸಂದೇಶ ಸಾರುವ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊಟ್ಟ ಮೊದಲು ಬಾರಿ ಜಾಗತಿಕ ಪ್ರಪಂಚಕ್ಕೆ ಕೊಟ್ಟವರು, ಅದನ್ನು ಜಾರಿಗೆ ತಂದವರು ಅಣ್ಣ ಬಸವಣ್ಣನವರು.
ಅನುಭವ ಮಂಟಪದ ಮೂಲಕ ಇಡೀ ಮನುಕುಲದ ಉದ್ಧಾರಕ್ಕಾಗಿ,ಸರ್ವರ ಕಲ್ಯಾಣಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ತಂದ ಕೀರ್ತಿ ಮತ್ತು ಶ್ರೇಯಸ್ಸು ಬಸವಣ್ಣನವರ ಆದಿಯಾಗಿ ಇಡೀ ಶರಣ ಸಂಕುಲಕ್ಕೆ ಸಲ್ಲುತ್ತದೆ ಜೊತೆಗೆ ಸಕಲ ಜೀವಾತ್ಮರೆಲ್ಲರಿಗೂ ಲೇಸು ಬಯಸಿದ ಜಗತ್ತಿನ ಮೊಟ್ಟ ಮೊದಲ ಸಮತವಾದಿ ಬಸವಣ್ಣನವರು ಎಂಬುದು ಯಾರು ಅಲ್ಲಗಳೆಯುವಂತಿಲ್ಲ. ಹಾಗಾಗಿ
ಮೌಲ್ಯಾಧಾರಿತ ಸಾಮರಸ್ಯ ಸಮೃದ್ಧ
ನಾಡು ಕಟ್ಟುವ ಕನಸು ಕಂಡು ಬಸವಣ್ಣನವರು,ಅದೇ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ಸಿದ್ಧಾಂತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿಪಾದಿಸಿದ್ದಾರೆ.ಜೊತೆಗೆ ಶಾಂತಿ,ಸಹಬಾಳ್ವೆ,ಕಾಯಕ,ದಯೇ,ಕರುಣೆ, ದಾಸೋಹ, ಅರಿವು, ಸಮಾನತೆಯ ವೈಚಾರಿಕ ವಿಚಾರಗಳನ್ನು ಜನಸಾಮಾನ್ಯರಿಗೆ ತಿಳಿಸುವ ಪ್ರಯತ್ನ ಮಾಡಿದ್ದಾರೆ.
ವಿಶ್ವವೇ ಒಂದು ಕುಟುಂಬವಿದಂತೆ ಹಾಗೂ ರಕ್ತ ಸಂಬಂಧಿಗಳೆಲ್ಲರೂ ಒಂದು, ಸ್ವಾರ್ಥ ಬಿಟ್ಟು, ನಾವೆಲ್ಲರೂ ಒಂದಾಗಿ ನಿಸ್ವಾರ್ಥದಿಂದ ಬದಕುವ ಯೋಚನೆಯ ಮನಸ್ಥಿತಿ ನಮ್ಮಲ್ಲಿ ಮೂಡಲಿ ಹಾಗೂ ಸೌಹಾರ್ದವಾಗಿ ಬಾಳುವ ಮೂಲಕ ಪ್ರೀತಿ – ಸ್ನೇಹಯವನ್ನು ಜಗತ್ತಿಗೆ ಪರಿಚಯಿಸುವ ಕೆಲಸ ಮಾಡೋಣ – ಸಾರೋಣ ಎನ್ನುವ ಆಶಾವಾದ ಬಯಕೆ ಪ್ರತಿಯೊಬ್ಬರ ಶರಣರದಾಗಿತ್ತು, ಅದರಂತೆ ಅವರು ಬಾಳುವ ಮೂಲಕ ನಮ್ಮೆಲ್ಲರಿಗೂ ಮಾದರಿಯಾಗಿದಾರೆ.ಹಾಗಾಗಿ ಶರಣರು ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡು ಬೆಳೆಸಿಕೊಂಡು ಬಂದಿರುವುದು ನಮಗೆ ಅವರ ವಚನಗಳ ಮೂಲಕ ತಿಳಿದುಬರುತ್ತದೆ.
ವಚನ ಸಾಹಿತ್ಯ ಮತ್ತು ಭಾರತ ಸಂವಿಧಾನ
ವಚನ ಮತ್ತು ಸಂವಿಧಾನ ಎರಡೂ ಒಂದೇ, ಅವು ಬೇರೆ, ಬೇರೆ ಅಲ್ಲ. ವಚನಗಳಲ್ಲಿರುವ ಅಂಶಗಳು ಸಂವಿಧಾನದಲ್ಲಿವೆ. ದೇಶದ ಪ್ರಗತಿಗೆ ವಚನ ಸಾಹಿತ್ಯ ಎಷ್ಟೋ ಪ್ರಮುಖ್ಯವೋ ಅಷ್ಟೋ ಮುಖ್ಯ ನಮ್ಮ ಭಾರತ ದೇಶದ ಸಂವಿಧಾನದ ಎನ್ನುವುದು ನಾವೆಲ್ಲರೂ ತಿಳಿದುಕೊಳ್ಳುವುದು ಅತಿ ಅವಶ್ಯ. ಹಾಗಾಗಿ ಈ ಎರಡು ತತ್ವಗಳಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಲ್ಲದೆ, ಪೂರಕ ಹಾಗೂ ಮಾರ್ಗದರ್ಶನ ಎನ್ನುವುದು ನಾವ್ಯಾರು ಮರೆಯಬಾರದು.ಆದ್ದರಿಂದ
ದೇಶದ ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಗೂ ಸಮಾನತೆ, ಸ್ವಾತಂತ್ರ್ಯ ನೀಡಿದೆ.
ಆದರೆ ಕೆಲ ಸಂಪ್ರದಾಯವಾದಿಗಳು ಸಮಾನತೆಯ ತತ್ವವಾದ ಸಂವಿಧಾನವನ್ನು ಸುಡುವ, ಅಗೌರವಿಸುವ ಬಗೆ ಮಾತನಾಡುತ್ತಿದ್ದಾರೆ.ಇವರೆಲ್ಲ ಅಹಂಕಾರದ ಅಜ್ಞಾನಿಗಳಾಗಿದ್ದಾರೆ ಎಂದು ಹೇಳಬಹುದು. ಪ್ರತಿಯೊಬ್ಬ ಪ್ರಜೆಗೂ ಸ್ವಚಂದವಾಗಿ ಬದುಕಲು ಅವಕಾಶ ನೀಡಿದೆಯನ್ನುವುದು ಮರೆತು, ಮನಸ್ಸಿಗೆ ತೋಚಿದಂತೆ ಕೆಲ ಅವಿವೇಕಿಗಳು ಬಾಲಿಶ್ಯ ಹೇಳಿಕೆಗಳನ್ನು ಕೊಟ್ಟು, ಅವರ ಬೆನ್ನು ಅವರೇ ತಟ್ಟಿಕೊಳ್ಳುವ ಸನ್ನಿವೇಶಗಳು ನಾವು ಅಲ್ಲಲ್ಲಿ ಕಂಡಾಗ ಮನಸ್ಸಿಗೆ ಅತ್ಯಂತ ನೋವಾಗುತ್ತದೆ. (ನಮ್ಮ ಸಂವಿಧಾನದ
ಮಹತ್ವವನ್ನು ತಿಳಿದುಕೊಳ್ಳುವ ಕೆಲಸ ಮಾಡದೇ, ಬರೀ ಟೀಕೆ ಮಾಡುವುದು ಎಷ್ಟೋ ಸರಿ ಇದೆ ಹೇಳೀ) ಮೊದಲು ಸಂವಿಧಾನದ ತತ್ವಗಳನ್ನು ತಿಳಿದುಕೊಳ್ಳುವ ಕೆಲಸ ಮಾಡಲಿ,ಮಾಡುವುದು ಸೂಕ್ತ.
ಆದಕಾರಣ ಹಗುರವಾಗಿ ಮಾತನಾಡುವುದನ್ನು ಬಿಡುವುದು ಅವರ ಶ್ರೇಯಸ್ಸಿಗಾಗಿ ಉತ್ತಮ ಎನ್ನುವುದು ಮನಗಂಡು,ದೇಶದ ಒಳ್ಳಿತಿಗಾಗಿ ದುಡಿಯುವ ಮನೋಬಲವನ್ನು ಪ್ರದರ್ಶಿಸುವ ಕೆಲಸ ಮಾಡುವುದು ಒಳ್ಳೆಯದು ಜೊತೆಗೆ ಸಹಕಾರ ನೀಡುವುದು ಅತ್ಯುತ್ತಮ ಮಾರ್ಗ ಸ್ನೇಹಿತರೆ.ಹಾಗಾಗಿ ಇಂದಿನ ಸಮಾಜದ ಎಲ್ಲಾ ನಾಗರಿಕರು ಪ್ರಜಾಪ್ರಭುತ್ವದ ಆದರ್ಶ ವಿಚಾರಗಳನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ, ತಿಳಿದುಕೊಂಡಾಗಲೇ ಈ ದೇಶದಲ್ಲಿ ಬದುಕಲು ನಾವು ಯೋಗ್ಯರಾಗುತ್ತೇವೆ.ಶಾಂತಿ, ನೆಮ್ಮದಿ ಹಾಗೂ ಸ್ನೇಹಮಯ ಜೀವನವನ್ನು ಸಾಗಿಸಲು ಸಾಧ್ಯವಾಗಬಹುದಾಗಿದೆ.
ಪ್ರಜಾಪ್ರಭುತ್ವದ ಪಿತಾಮಹ
ಬಸವಣ್ಣನವರು ಒಬ್ಬ ಪ್ರಜಾವಾದಿ, ಸಾಮಾಜಿಕ ನ್ಯಾಯ ಮತ್ತು ಮಾನವ ಹಕ್ಕುಗಳ ಪ್ರತಿಪಾದಕ. ಪ್ರಜಾಪ್ರಭುತ್ವದ ಪಿತಾಮಹ. ಮ್ಯಾಗ್ನಕಾರ್ಟ್ ಒಪ್ಪಂದಕ್ಕಿಂತ ಅರ್ಧ ಶತಮಾನದ ಹಿಂದೆಯೇ ಕಲ್ಯಾಣದಲ್ಲಿ ಅನುಭವ ಮಂಟಪವೆಂಬ ವಿಶ್ವಮಾನ್ಯ ಪ್ರಜಾಪ್ರಭುತ್ವದ ಸಂಸತ್ತನ್ನು ನಿರ್ಮಿಸಿದರು,ನಿರ್ಮಿಸಿದ ಕಾರಣದಿಂದಲೇ ಇಂದು ವಿಶ್ವವು ಪ್ರಜಾಪ್ರಭುತ್ವ ವ್ಯವಸ್ಥೆ ಬಗೆ ಮಾತನಾಡುತ್ತದೆ ಎಂದರೆ ಅಂದು ಬಸವಣ್ಣನವರ ವೈಚಾರಿಕ ನಿಲುವು ಹೇಗಿತ್ತು ಎನ್ನುವುದು ನಾವೆಲ್ಲರೂ ಒಮ್ಮೆ ಎದೆ ಮೇಲೆ ಕೈಯಿಟ್ಟು ಯೋಚನೆ ಮಾಡುವ ದೊಡ್ಡ ವಿಚಾರ. ಆದ್ದರಿಂದ ಈಗಲಾದರೂ ಎಚ್ಚತ್ತು ಬಸವಣ್ಣನವರು ನೀಡಿರುವ ಪ್ರಜಾಪ್ರಭುತ್ವ ವಚನ ಸಾಹಿತ್ಯವನ್ನು ಅರಿತು ನಾವೆಲ್ಲರೂ ಬಾಳಬೇಕಾಗಿದೆಯಲ್ಲವೇ.
ಬಸವಣ್ಣನವರ ಪ್ರಜಾಪ್ರಭುತ್ವ ಕಲ್ಪನೆಯ
ವಚನಗಳು ನಮ್ಮ ಬದುಕಿಗೆ ದಾರಿದೀಪವಾಗಿವೆ ಎನ್ನುವುದು ಸತ್ಯ. ಕಳಬೇಡ, ಕೊಲಬೇಡ ಎಂಬ ಸಪ್ತಶೀಲದ ವಚನವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅಪರಾಧಗಳು ಈ ಜಗತ್ತಿನಲ್ಲಿ ನಡೆಯಲು ಸಾಧ್ಯವಿಲ್ಲ. ಈ ವಚನದ ಆಶಯವನ್ನೇ ನಮ್ಮ ಸಂವಿಧಾನ ತಿಳಿಸುತ್ತದೆ. ಸಮಾನತೆ ತತ್ವ ಸಾರಿದ ಬಸವಣ್ಣನವರು ಜಾತಿಯತೆ ಹೋಗಲಾಡಿಸಬೇಕೆಂದು ಕರೆ ನೀಡಿ ಅದರಂತೆ
ಹೋರಾಟ ಮಾಡಿದರು. ಆದರೆ ಇಂದಿಗೂ ಅದು ಹೋಗಿಲ್ಲ ಹೆಚ್ಚಾಗುತ್ತಿದೆ.
ವಚನಗಳ ಅಧ್ಯಯನ, ಅವುಗಳ ಪಾಲನೆಯಿಂದ ಜಾತ್ಯಾತೀತ ರಾಷ್ಟ್ರ, ಸಮಾಜ ನಿರ್ಮಾಣ ಸಾಧ್ಯ ಎನ್ನುವುದಂತು ನಾವು ಮರೆಯಬಾರದು ಸಹೋದರರೆ,ವಚನ ಸಾಹಿತ್ಯವು ಸಂವಿಧಾನದಂತೆ ಸರ್ವರಿಗೂ ಸಮಬಾಳು, ಸಮಪಾಲು ತತ್ವ ನೀಡುತ್ತದೆ. ಸರ್ವ ಸಮಾನತೆಯ ಸಮಾಜ ನಿರ್ಮಾಣವೇ ವಚನ ಸಾಹಿತ್ಯದ ಪ್ರಮುಖ ತತ್ವವಾಗಿದೆ. ಇದರಿಂದಾಗಿಯೇ 900 ವರ್ಷಗಳು ಕಳೆದರೂ ವಚನ ಸಾಹಿತ್ಯ ಜೀವಂತವಾಗಿದೆಯಲ್ಲವೇ.
ಹಾಗಾಗಿ ಬಸವಣ್ಣನ ದೃಷ್ಟಿಯಲ್ಲಿ ಪ್ರಜಾಪ್ರಭುತ್ವ ಅಂದರೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಎಲ್ಲಾ ಜನಸಾಮಾನ್ಯರಿಗೆ ಮುಕ್ತವಾಗಿ ಸೀಗಬೇಕೆಂಬ ನಿಲುವೆ ಅವರದಾಗಿತ್ತು. ಬಸವಣ್ಣನವರ ಕಾಯಕ ನಿಷ್ಠೆಗೆ ಮಾನವೀಯತೆಗೆ ಬುನಾದಿ ಆಗಬೇಕೆಂದು ನಂಬಿ ಅದರಂತೆ ನಡೆದವರು ಹಾಗೆ ಧಾರ್ಮಿಕ, ಸಮಾಜಿಕ(ಪ್ರಜಾಪ್ರಭುತ್ವದ ಸಂಸತ್ತು ) ಕಾರ್ಯಗಳ ಸೇವೆಗಳು ಅಂದಿನ ಅನುಭವ ಮಂಟಪದ ಅಡಿಯಲ್ಲಿ ಸಾಗಿದವು, ಶರಣರೆಲ್ಲರೂ ಸೇರಿ ಆದರ್ಶ ಸಮಾನತೆಯ ಸಮಾಜವನ್ನು ಕಟ್ಟಿದರು,ವಚನ ಸಾಹಿತ್ಯವನ್ನು ರಚಿಸಿದರು. ಹಾಗೂ ಬಸವಣ್ಣ ನವರು ಅವರ ಆತ್ಮ ಬಲದ – ಅನುಭವದ ವೈಜ್ಞಾನಿಕ ಮನೋಧರ್ಮದ ದೃಷ್ಟಿಯಿಂದ ಲಿಂಗಾಯತ ಧರ್ಮವನ್ನು ಸ್ಥಾಪಿಸಿ – ಬೆಳೆಸಿ, ವಚನಗಳನ್ನು ನಮಗೆ ಕೊಟ್ಟು ಹೋಗಿದ್ದಾರೆ ಎನ್ನುವ ಅರಿವು ನಮ್ಮಲ್ಲಿ ಉಂಟುಮಾಡಲಿ ಹಾಗೆ ಸಮಾನತೆಯ ಮಂತ್ರ ಭೋದನೆ ಮಾಡಿದ ವಿಚಾರ ಸಹ ನಮ್ಮ ಗಮನದಲ್ಲಿಟ್ಟುಕೊಳ್ಳುವುದು ಉತ್ತಮ.
ಆದರೆ ಈಗಿನ ಸಮಾನತೆ ಕೇವಲ ನೆಪಮಾತ್ರಕ್ಕೆ ಅಂದರೆ ಲೋಕತಂತ್ರಕ್ಕೆ ಮಾತ್ರ ಸೀಮಿತವಾಗಿದೆ ಎನ್ನುವುದಂತು ಸತ್ಯ,ಹಾಗಾಗಿ ಲೋಕ ತಂತ್ರಕ್ಕೆ
ಸ್ವತಂತ್ರವಾಗಿ, ನಿಷ್ಪಕ್ಷವಾಗಿ ಕೆಲಸ ಮಾಡಲು ಸಮಾನತೆಯ ವಚನ ಸಾಹಿತ್ಯದ ಪ್ರಜಾಪ್ರಭುತ್ವದಿಂದ ಮಾತ್ರ ಸಾಧ್ಯ, ಇದರಿಂದ ಈ ದೇಶಕ್ಕೆ ಒಳ್ಳೆಯ ಭವಿಷ್ಯ ತಂದುಕೊಡುತ್ತದೆ ಎಂದು ತಿಳಿದುಕೊಂಡು ನಡೆದರೆ ಅದೊಂದು ಉತ್ತಮ ಹೆಜ್ಜೆ ಎನ್ನಬಹುದು. ಹಾಗೆ
ಬಸವಣ್ಣನವರು ಕಲ್ಯಾಣದಲ್ಲಿ ಮಾಡಿದ ಎಲ್ಲಾ ಪ್ರಜಾಪ್ರಭುತ್ವ ಪ್ರಯೋಗಗಳಲ್ಲಿ ಬಹಳಷ್ಟು ಪ್ರಯೋಗಗಳು ಜಗತ್ತಿನಲ್ಲಿ ನಡೆದ ಮೊದಲ ಪ್ರಯೋಗಗಳೇ ಆಗಿವೆ. ಬಸವಣ್ಣನವರು ಎಲ್ಲದಕ್ಕೂ ಸಮಾಜ ಮುಖಿ ಸೇವೆಗಳ ಕಾರ್ಯಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದರು.ರಾಜ್ಯಸಿಂಹಾಸನವನ್ನು ಅವರು ಕೆಣಕಲಿಲ್ಲ.
ಆದರೆ ಶೂನ್ಯಸಿಂಹಾಸನ ಸೃಷ್ಟಿಸಿ ಪ್ರಜಾಪ್ರಭುತ್ವದ ಕನಸು ಬಿತ್ತಿದರು. ಅವರ ಅನುಭವ ಮಂಟಪದ ಅಮರಗಣಂಗಳಲ್ಲಿ ಎಲ್ಲಾ ಜಾತಿ ಜನಾಂಗದವರಿದ್ದರು. ಮಹಿಳೆಯರಿದ್ದರು. ಅವರೆಲ್ಲ ಆ ಅನುಭವ ಮಂಟಪ ಎಂಬ ಸಮಜೋ ಧಾರ್ಮಿಕ ಸಂಸತ್ತಿನ ಸದಸ್ಯರಾಗಿದ್ದರು. ಅಭಿವ್ಯಕ್ತಿ ಸ್ವಾತಂತ್ರ್ಯ ಪಡೆದವರಾಗಿದ್ದರು. ಹೀಗೆ ಸ್ವತಂತ್ರ ಸರ್ವಸಮಾನತೆಯ ವಿಚಾರಧಾರೆಯನ್ನು ಜಗತ್ತಿನಲ್ಲಿ ಹರಿಸಿದವರಲ್ಲಿ ಬಸವಣ್ಣನವರು ಪ್ರಥಮರು, ಅವರು ಪ್ರಾರಂಭಿಸಿದ ಚಳವಳಿಯಿಂದಾಗಿ ಮಹಿಳೆಯರು ಮತ್ತು ಅಸ್ಪೃಶ್ಯರು ಕೂಡ ಶರಣರಾದರು.
ಅಕ್ಷರ ಕಲಿತರು, ಕಲಿಯುವ ಮೂಲಕ ವಯಸ್ಕರ ಶಿಕ್ಷಣ ಕಲ್ಯಾಣದ ನಾಡಿನಲ್ಲಿ ಆರಂಭವಾಯಿತು – ಆರಂಭವಾಗಿದ್ದು ಐತಿಹಾಸಿಕ ಯಾಕೆಂದರೆ 21 ನೇ ಶತಮಾನದ ಈಗಿನ ಎಲ್ಲಾ ಸರಕಾರಗಳು ಕೋಟಿಗಟ್ಟಲೆ ಹಣ ಸುರಿದರೂ ಸಹ ಇಂದಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಲು ಸಾಧ್ಯವಾಗುತ್ತಿಲ್ಲ ಅಂದ ಮೇಲೆ 12ನೇ ಶತಮಾನದಲ್ಲಿ ಅವಿಧ್ಯಾವಂತರನ್ನು ವಿಧ್ಯಾವಂತರನ್ನಾಗಿ ಮಾಡಿ – ಶಿಕ್ಷಣ ಕಲಿಸಿ, ವಚನಗಳನ್ನು ರಚನೆ ಮಾಡುವಂತೆ ಪ್ರೋತ್ಸಾಹ ಮಾಡಿದ ಕೆಲಸ ಸಣ್ಣದಲ್ಲಾ,ಅದಕ್ಕಾಗಿ ಇದರ ಕೀರ್ತಿ ಮತ್ತು ಸಾಧನೆ ಬಸವಣ್ಣನವರದು ಹಾಗಾಗಿ ಅವರ ಬಗೆ ಎಷ್ಟೋ ಹಾಡಿ ಹೊಗಳಿದರು ಕಡಿಮೆಯಾಗುತ್ತದೆ.
ಕೊನೆಯ ಮಾತು
ಬಸವಣ್ಣನವರ ವಚನಗಳಲ್ಲಿ ವಿಶ್ವಸಂಸ್ಥೆ ಘೋಷಿಸಿದ ಎಲ್ಲಾ ಮಾನವ ಹಕ್ಕುಗಳ ವಿಚಾರಗಳೆಲ್ಲವೋ ಸೇರಿವೆ.ಸ್ಥಾವರ ಲಿಂಗಕ್ಕೆ ಪರ್ಯಾಯವಾಗಿ ಇಷ್ಟಲಿಂಗ, ಗುಡಿಗೆ ಪರ್ಯಾಯವಾಗಿ ಅನುಭವ ಮಂಟಪ, ದಾನಕ್ಕೆ ಸಮನಾಗಿ ದಾಸೋಹ,ಕರ್ಮಸಿದ್ಧಾಂತಕ್ಕೆ ಪರ್ಯಾಯವಾಗಿ ಕಾಯಕ ಸಿದ್ಧಾಂತ, ಹೀಗೆ ಎಲ್ಲ ರೀತಿಯಿಂದಲೂ ಬಸವಣ್ಣನವರು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ
ಹಿಡಿದುಕೊಳ್ಳುವ ಮೂಲಕ ಬದುಕಿನುದ್ದಕ್ಕೂ ಚ್ಯುತಿ ಬರದಂತೆ ಕಾಪಾಡಿಕೊಂಡು ಬಂದಿದ್ದಾರೆ.ಇದನ್ನು ನಾವೆಲ್ಲರೂ ಉಳಿಸಿಕೊಂಡು – ಬೆಳೆಸಿಕೊಂಡು ಹೋಗುವ ಹೋಣೆಗಾರಿಕೆ ಪ್ರತಿಯೊಬ್ಬ ಬಸವಾಭಿಮಾನಿಗಳ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ4 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ5 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ4 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ5 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ5 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ5 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

