ದಿನದ ಸುದ್ದಿ
‘ಚೊಚ್ಚಲ ಕೃತಿ’ ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಸುದ್ದಿದಿನ,ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರವು 2019ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು. ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8ಡೆಮ್ಮಿ ಅಳತೆಯಲ್ಲಿ ಕನಿಷ್ಟ 60ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.
ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವನ್ನು ಹೊಂದಿರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ, ಸಂಗತಿಗಳು ಪ್ರಸ್ತಾಪವಾಗಿರಬಾರದು.
ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಯು 18-35ವರ್ಷ ವಯೋಮಿತಿಯೊಳಗಿನವರಾಗಿದ್ದು, ಪ್ರಸ್ತಾವನೆಯೊಂದಿಗೆ ದೃಢೀಕರಿಸಿದ ಎಸ್.ಎಸ್.ಎಲ್.ಸಿ. ಪ್ರಮಾಣಪತ್ರದ ನಕಲು ಪ್ರತಿ, ಜನ್ಮ ದಾಖಲಾತಿ ಪ್ರಮಾಣಪತ್ರ ಸಲ್ಲಿಸಬೇಕು. ಅರ್ಹರು ತಮ್ಮ ಪ್ರಸ್ತಾವನೆಯನ್ನು ಏಪ್ರಿಲ್ 15ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು-2 ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಪ್ರಾಧಿಕಾರದ ಜಾಲತಾಣ www.kannadapustakapradhikara.comನ್ನು ಅಥವಾ ದೂರವಾಣಿ ಸಂಖ್ಯೆ 080-22484516, 22107704ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್‍ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.