ಅಂತರಂಗ
ಬ್ರಾಹ್ಮಣ್ಯದ ಅಂತರಂಗ – ಪಶ್ಚಾತ್ತಾಪ ಮತ್ತು ದಲಿತ ಕ್ಷಮೆ
- ವಿವೇಕಾನಂದ. ಹೆಚ್.ಕೆ
ಬೆಳಗಿನ ನಾಲ್ಕು ಗಂಟೆಗೆ ನನ್ನ ಹೊದಿಕೆಯನ್ನು ಕಿತ್ತೆಸೆದು ಜೋರು ಧ್ವನಿಯಲ್ಲಿ ಎಬ್ಬಿಸುತ್ತಿದ್ದರು ನನ್ನಪ್ಪ. ಕಾರ್ತಿಕ ಮಾಸದ ದಿನಗಳವು. ಚಳಿಗೆ ದೇಹ ನಡುಗುತ್ತಿತ್ತು. ಆದರೂ ಬೇಗ ಎದ್ದು ಕೊರೆಯುವ ತಣ್ಣೀರನ್ನೇ ಸ್ನಾನ ಮಾಡಿ 4/30 ಕ್ಕೆಲ್ಲಾ ಮನೆ ಬಿಟ್ಟು ಅಪ್ಪನೊಂದಿಗೆ ಮಡಿಯುಟ್ಟು ಪೂಜೆ ಸಾಮಾನುಗಳೊಂದಿಗೆ ಊರಿನಿಂದ 5/6 ಕಿಲೋಮೀಟರ್ ದೂರದಲ್ಲಿ ದಟ್ಟ ಮರಗಳ ಮಧ್ಯದ ಹಾದಿಯಲ್ಲಿದ್ದ ಕಾಶಿ ವಿಶ್ವನಾಥನ ದೇವಸ್ಥಾನಕ್ಕೆ ನೆಡದೇ ಹೋಗುತ್ತಿದ್ದೆವು.
ಆ ದೇವಸ್ಥಾನದ ಒಬ್ಬರೇ ಅರ್ಚಕರು ಅಪ್ಪ. ಅಪ್ಪನಿಗೆ ಸಹಾಯಕ ನಾನು. ನಾನಾಗ ಏಳನೇ ತರಗತಿ ಓದುತ್ತಿದ್ದೆ. ಆ ದೇವಸ್ಥಾನದ ಮಂಗಳಾರತಿಯ ದಕ್ಷಿಣೆ ಹಣ ಮತ್ತು ಊರಿನವರು ಕೊಡುತ್ತಿದ್ದ ಧವಸ ಧಾನ್ಯಗಳು ಮತ್ತು ಅಪರೂಪಕ್ಕೆ ನಡೆಯುತ್ತಿದ್ದ ಮದುವೆಯ ಪೌರೋಹಿತ್ಯದ ಗೌರವ ಧನವೇ ನಮ್ಮ ಮನೆಯ ಆದಾಯ.
ಆಗ ಈಗಿನಂತೆ ಗೃಹ ಪ್ರವೇಶ, ನಾಮಕರಣ, ಸತ್ಯನಾರಾಯಣ ಪೂಜೆ ಇರಲಿಲ್ಲ. ಬಡತನ ಬರಗಾಲದ ದಿನಗಳವು. ನಮ್ಮದು ಬಯಲು ಸೀಮೆಯ ಹಳ್ಳಿ. ಹೊಸ ಮನೆ ಕಟ್ಟುತ್ತಿದ್ದುದು ಅಪರೂಪ. ನಾಮಕರಣ ಸಹ ಉಚಿತವಾಗಿ ಹೆಸರು ಬಲ ನೋಡಿ ಹೇಳಿದರೆ ಅವರ ಮನೆಯಲ್ಲಿಯೇ ತೊಟ್ಟಿಲು ಕಟ್ಟಿ ಮಾಡಿಕೊಳ್ಳುತ್ತಿದ್ದರು. ಅಪ್ಪ ಸಹ ಊರಿನ ಒಬ್ಬರೇ ಅರ್ಚಕರಾದುದರಿಂದ ಯಾರನ್ನೂ ಹಣಕ್ಕಾಗಿ ಒತ್ತಾಯ ಅಥವಾ ನಿಷ್ಠುರ ಮಾಡಿಕೊಳ್ಳುತ್ತಿರಲಿಲ್ಲ. ಹಣಕ್ಕಿಂತ ಅವರಿಗೆ ಗೌರವ ಮರ್ಯಾದೆ ಪ್ರಾಣಕ್ಕಿಂತ ಹೆಚ್ಚು ಎಂದೇ ಭಾವಿಸಿದ್ದರು.
5 ಗಂಟೆಗೆ ದೇವಸ್ಥಾನ ತಲುಪುತ್ತಿದ್ದೆವು. ಅದು ಸ್ವಲ್ಪ ವಿಶಾಲವಾದ ಕಲ್ಲಿನ ಕಟ್ಟಡ. ಅಲ್ಲಲ್ಲಿ ಬಿಲ್ವಪತ್ರೆಯ ಮರಗಳಿದ್ದವು. ಪಕ್ಕದಲ್ಲಿಯೇ ಒಂದು ಸಣ್ಣ ಕಲ್ಯಾಣಿ. ಅಪ್ಪ ದೇವರ ವಿಗ್ರಹ, ಲಿಂಗ, ನಂದಿ, ಒಳ ಪ್ರಾಂಗಣ ಮತ್ತು ಸುತ್ತಲಿನ ಜಾಗವನ್ನು ಕಲ್ಯಾಣಿ ನೀರಿನಿಂದ ಶುಚಿಗೊಳಿಸಿ ಪೂಜೆಗೆ ಸಿದ್ದ ಮಾಡಿಕೊಳ್ಳುತ್ತಿದ್ದರು. ನಾನು ಭಕ್ತಾದಿಗಳು ಕುಳಿತುಕೊಳ್ಳುವ ಮತ್ತು ಹೊರಾಂಗಣವನ್ನು ಕಸ ಗುಡಿಸಿ ಸ್ವಚ್ಛಗೊಳಿಸುತ್ತಿದ್ದೆ.
ಸುಮಾರು 5/30 ಕ್ಕೆಲ್ಲಾ ಜನ ಒಬ್ಬೊಬ್ಬರಾಗಿ ಹೂವು ಹಣ್ಣು ಕಡ್ಡಿ ಕರ್ಪೂರ ಅರಿಶಿನ ಕುಂಕುಮ ಸಮೇತ ಮಕ್ಕಳೊಂದಿಗೆ ಬರುತ್ತಿದ್ದರು. ಸೋಮವಾರದಂದು ವಿಶೇಷ ಪೂಜೆ. ಅಂದು ಮಂಗಳ ವಾದ್ಯಗಳು ಮತ್ತು ಊರಿನ ಶ್ರೀಮಂತರ ಮನೆಯ ರುಚಿಕಟ್ಟಾದ ಪ್ರಸಾದ ವಿನಿಯೋಗ ನಡೆಯುತ್ತಿತ್ತು.
ಜೊತೆಗೆ ಭಕ್ತರು ನೀಡುತ್ತಿದ್ದ ಬಾಳೆಹಣ್ಣು ಮತ್ತು ತೆಂಗಿನಕಾಯಿಯ ಸ್ವಲ್ಪ ಭಾಗವನ್ನು ನಾನು ಒಂದು ತಪ್ಪಲೆಯಲ್ಲಿ ನೀಟಾಗಿ ಕತ್ತರಿಸಿ ಮನೆಯಿಂದ ತಂದ ಹಾಲು ಸಕ್ಕರೆ/ಬೆಲ್ಲ ಏಲಕ್ಕಿ ಬೆರಸಿ ಮಾಡುತ್ತಿದ್ದ ರಸಾಯನ ಎಲ್ಲರಿಗೂ ಬಹಳ ಇಷ್ಟವಾಗಿತ್ತಿತ್ತು. ಪೂಜೆ ಅಭಿಷೇಕ ನೈವೇದ್ಯದ ನಂತರ ಅದನ್ನು ಜನರಿಗೆ ಸಣ್ಣಗೆ ಕತ್ತರಿಸಿದ ಬಾಳೆ ಎಲೆಯಲ್ಲಿ ಪ್ರಸಾದ ಹಂಚುವ ಜವಾಬ್ದಾರಿ ನನ್ನದಾಗಿತ್ತು. ಆ ಸಮಯದಲ್ಲಿ ಅಪ್ಪ ಹೂ ಮತ್ತು ತೀರ್ಥ ಕೊಡುತ್ತಾ ಕೆಲವು ವಿಶೇಷ ಸಂದರ್ಭಗಳಲ್ಲಿ ಅರ್ಚನೆ ಮಾಡುತ್ತಿದ್ದರು.
ಆಗ ಜನರ ಭಯ ಭಕ್ತಿ, ನನ್ನಂತ ಸಣ್ಣವನಿಗೂ ಅವರು ಪಾದ ಮುಟ್ಟಿ ನಮಸ್ಕರಿಸುತ್ತಿದ್ದುದು ನನ್ನಲ್ಲಿ ಹೆಮ್ಮೆ ಮೂಡಿಸಿ ಆತ್ಮವಿಶ್ವಾಸ ಹೆಚ್ಚಿಸುತ್ತಿತ್ತು. 8 ಗಂಟೆಯ ಒಳಗೆ ಪೂಜೆ ಮುಗಿಸಿ 8/30 ರ ಒಳಗೆ ಎಲ್ಲವನ್ನೂ ಸ್ವಲ್ಪ ಮಾತ್ರ ಸ್ವಚ್ಛಗೊಳಿಸಿ 9 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದೆವು. ನಾನು ಬೇಗ ತಿಂಡಿ ತಿಂದು ಮನೆಯ ಬಳಿಯೇ ಇದ್ದ 10 ಗಂಟೆಗೆ ಪ್ರಾರಂಭವಾಗುತ್ತಿದ್ದ ಶಾಲೆಗೆ ಹೋಗುತ್ತಿದ್ದೆ.
ಮತ್ತೆ ಸಂಜೆ 5 ಕ್ಕೆ ದೇವಸ್ಥಾನಕ್ಕೆ ಹೊರಟು ಬೆಳಗಿನಂತೆ ಎಲ್ಲಾ ಕೆಲಸ ಮುಗಿಸಿ ರಾತ್ರಿ ಸುಮಾರು 9 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದೆವು.
ಆಗಿನ ನಮ್ಮ ಊರಿನಲ್ಲಿ ಕುರುಬರ ಪೇಟೆ, ನಾಯಕರ ಹಟ್ಟಿ, ಹೊಲೆಯರ ಬೀದಿ, ಮಾದಿಗರ ಕೇರಿ, ಸಾಬರ ಗಲ್ಲಿ, ಗೌಡರ ಪಾಳ್ಯ, ಲಿಂಗಾಯಿತರ ಮಠಬೀದಿ, ತಿಗಳರ ಪೇಟೆ, ಗೊಲ್ಲರ ಹಟ್ಟಿ ಹೀಗೆ ಬೇರೆ ಬೇರೆ ಹೆಸರುಗಳ ಸ್ಥಳಗಳಿದ್ದವು. ನಾವು ಇದ್ದ ಜಾಗವನ್ನು ಅಗ್ರಹಾರ ಎಂದು ಕರೆಯುತ್ತಿದ್ದರು.
ಆಗ ನನ್ನನ್ನು ಊರಿನ ಜನ
ಚಿಕ್ಕ ಸ್ವಾಮಿ, ಮರಿಸ್ವಾಮಿ, ಪುಟ್ಟ ಬುದ್ದಿ, ಅಯ್ನೋರು, ಮರಿ ಪೂಜಾರಿ, ಸಣ್ಣ ಭಟ್ಟ, ಕಿರಿ ಜೋಯಿಸ ಮುಂತಾದ ಹೆಸರುಗಳಿಂದ ಕರೆಯುತ್ತಿದ್ದರು ಮತ್ತು ನನ್ನ ವಯಸ್ಸಿಗೆ ಮೀರಿ ದೊಡ್ಡವನು ಎಂಬಷ್ಟು ಗೌರವ ಕೊಡುತ್ತಿದ್ದರು. ಶಾಲೆಯ ಓದಿನಲ್ಲೂ ನಾನು ಎಲ್ಲರಿಗಿಂತ ಮುಂದೆ. ಆಗ ನನಗೆ ನಾನು ಇತರರಿಗಿಂತ ಉತ್ತಮ ಸ್ಥಾನವನ್ನು ಹೊಂದಿದ್ದೇನೆ, ಇಡೀ ಊರಿನ ಗೌರವವನ್ನು ಹೊಂದಿದ ಶ್ರೇಷ್ಠ ವ್ಯಕ್ತಿ ಅನಿಸುತ್ತಿತ್ತು.
ಕಾಲಚಕ್ರ ಉರುಳಿದಂತೆ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ನಗರ ಸೇರಿದೆ. ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ನಲ್ಲಿ ಅತಿ ಹೆಚ್ಚು ಅಂಕ ಪಡೆದು ಕ್ಯಾಂಪಸ್ ಸೆಲೆಕ್ಷನ್ ನಲ್ಲಿ ಅಮೆರಿಕಾದ ಟೆಕ್ಸಾಸ್‌ನ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿದೆ.
ಕೆಲವು ವರ್ಷಗಳ ಪ್ರಾಮಾಣಿಕ ಮತ್ತು ದಕ್ಷ ಸೇವೆಯ ನಂತರ ಈಗ ಅಲ್ಲಿನ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥನಾಗಿದ್ದೇನೆ. ಆದರೆ ಈಗಲೂ ಭಾರತದ ಪೌರತ್ವವನ್ನೇ ಹೊಂದಿದ್ದೇನೆ.
ಅಪ್ಪ ಇತ್ತೀಚೆಗಷ್ಟೇ ತೀರಿಕೊಂಡರು. ಅಮ್ಮ ಬಹಳ ಹಿಂದೆಯೇ ನಮ್ಮನ್ನು ಅಗಲಿದ್ದರು. ನಾವು ಇದ್ದ ಮನೆ ಮತ್ತು ಆ ದೇವಸ್ಥಾನದ ಅರ್ಚಕ ವೃತ್ತಿಯನ್ನು ಚಿಕ್ಕಪ್ಪ ಮತ್ತು ಅವರ ಮಕ್ಕಳು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಗೆಳೆಯರೆ,
ಸುಮಾರು 50 ವರ್ಷಗಳ ನನ್ನ ಸುದೀರ್ಘ ಬದುಕಿನ ಅನುಭವದಲ್ಲಿ ನನ್ನೆರಡು ಮಾತುಗಳು.
” ಹೌದು, ನಾನೊಬ್ಬ ಬ್ರಾಹ್ಮಣ. ಭಾರತೀಯ ಸಮಾಜದ ವರ್ಣಾಶ್ರಮ ವ್ಯವಸ್ಥೆಯ ಮೇಲಿನ ಸ್ಥಾನದಲ್ಲಿರುವವನು. ಹಾಗೆಯೇ ಅದೇ ವ್ಯವಸ್ಥೆಯಲ್ಲಿ ಮುಟ್ಟಿಸಿಕೊಳ್ಳದ ಒಂದು ಅಸ್ಪೃಶ್ಯ ವರ್ಗವೊಂದು ಅಸ್ತಿತ್ವದಲ್ಲಿದೆ.
ಆಫೀಸಿನ ಕೆಲಸದ ಮೇಲೆ ನ್ಯೂಯಾರ್ಕ್ ಪ್ರವಾಸದಲ್ಲಿರುವ ನಾನು ಮೊಟ್ಟಮೊದಲ ಬಾರಿಗೆ ಅಲ್ಲಿನ Statue of liberty ನೋಡುತ್ತಿದ್ದಾಗ ಭಾವ ತೀವ್ರತೆಗೆ ಒಳಗಾಗಿ, ಕಳೆದ ತಿಂಗಳಷ್ಟೇ ನಾನು ಓದಿದ್ದ
” Un touchables of India ” A tragedy behind Indian social structure even today ,
ಎಂಬ ಅನಾಮಧೇಯ ಲೇಖಕನ ಪುಸ್ತಕ ಮತ್ತು ನನ್ನ ಬಾಲ್ಯದಲ್ಲಿ ನನ್ನೂರಿನ ಅಸ್ಪೃಶ್ಯತೆ ಹಾಗೂ ಈಗಲೂ ಆಗಾಗ ಭಾರತದಿಂದ ವರದಿಯಾಗುತ್ತಿರುವ ಅಸ್ಪೃಶ್ಯರ ಮೇಲಿನ ದೌರ್ಜನ್ಯ, ಭಾರತದ ಈಗಿನ ಸಾಮಾಜಿಕ ವ್ಯವಸ್ಥೆ ನೆನಪಾಗಿ ನನ್ನ ಸುತ್ತಲಿನ ಜನರ ಇರುವಿಕೆಯನ್ನು ಮರೆತು ಜೋರಾಗಿ ದುಃಖದಿಂದ ಉಮ್ಮಳಿಸುತ್ತಿದ್ದೇನೆ. ನಾನೊಬ್ಬ ಸಾಮಾನ್ಯ ವ್ಯಕ್ತಿ. ನನ್ನೊಬ್ಬನಿಂದ ಈ ಬೃಹತ್ ಜಾತಿ ವ್ಯವಸ್ಥೆಗೆ ಏನೂ ಮಾಡಲು ಸಾಧ್ಯವಿಲ್ಲ. ಆದರೆ ವೈಯಕ್ತಿಕವಾಗಿ ಆತ್ಮಸಾಕ್ಷಿಯಿಂದ ಹೇಳುತ್ತೇನೆ.
” ಅಸ್ಪೃಶ್ಯರೇ/ದಲಿತ ವರ್ಗದವರೇ, ಕಾರಣ, ಸಂದರ್ಭ, ಉದ್ದೇಶ, ಅರ್ಥ ಏನೇ ಇರಲಿ, ಅಸ್ಪೃಶ್ಯತೆ ಎಂಬ ಒಂದು ಜನಾಂಗವನ್ನು ಸೃಷ್ಟಿಸಿದ, ಆ ಮೃಗೀಯ ಭಾವನೆಯೊಂದಿಗೆ ಒಂದು ಸಮುದಾಯವನ್ನು ಹುಟ್ಟುಹಾಕಿದ ಮತ್ತು ಅದನ್ನು ಈಗಲೂ ಪಾಲಿಸುತ್ತಿರುವ ಕಾರಣಕ್ಕಾಗಿ ಜಾತಿಯಿಂದ ಬ್ರಾಹ್ಮಣನಾದ ನಾನು ನಿಮ್ಮಲ್ಲಿ ಪರಿಪರಿಯಾಗಿ ಕ್ಷಮೆ ಕೇಳುತ್ತೇನೆ. ಇಂತಹ ಒಂದು ವ್ಯವಸ್ಥೆಯ ಭಾಗವಾಗಿದ್ದಕ್ಕಾಗಿ ನಾಚಿಕೆಯಿಂದ ತಲೆ ತಗ್ಗಿಸುತ್ತೇನೆ ಮತ್ತು ಪಶ್ಚಾತ್ತಾಪ ಪಡುತ್ತಿದ್ದೇನೆ.
ನಿಮ್ಮೆಲ್ಲರ ಮುಂದೆ ಸಾರ್ವಜನಿಕವಾಗಿ ಪ್ರಮಾಣ ಮಾಡುತ್ತೇನೆ. ” ಇನ್ನೆಂದಿಗೂ ನಾನು ಯಾವ ಕಾರಣಕ್ಕೂ ನನ್ನ ಜಾತಿಯನ್ನು ಉಳಿಸಿಕೊಳ್ಳದೆ ಇಡೀ ಕುಟುಂಬದ ಸಮೇತ ಭಾರತದ ಸುಪ್ರೀಂಕೋರ್ಟ್ ನಲ್ಲಿ ಕಾನೂನಿನ ರೀತಿಯಲ್ಲಿ ನನ್ನ ಜಾತಿ ಭಾರತೀಯ ಎಂದು ಘೋಷಿಸಿಕೊಳ್ಳುತ್ತೇನೆ. ನನ್ನ ಮುಂದಿನ ವಂಶ ಭಾರತೀಯ ಜನಾಂಗವಾಗಿಯೇ ಗುರುತಿಸಲ್ಪಡಬೇಕು ಎಂದು ಆಶಿಸುತ್ತೇನೆ. ಜಾತಿಯ ಶ್ರೇಷ್ಠತೆಗಿಂತ ಮನುಷ್ಯ ಶ್ರೇಷ್ಠತೆಯನ್ನು ಬೆಂಬಲಿಸುತ್ತೇನೆ. ಇಡೀ ಭಾರತೀಯ ಸಮುದಾಯ ಇದನ್ನೇ ಅನುಸರಿಸಲಿ ಎಂಬ ಬಯಕೆಯೊಂದಿಗೆ …….. ” ಮತ್ತೊಮ್ಮೆ ಕ್ಷಮಾಪಣೆ ಕೇಳುತ್ತಾ….
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243



