ದಿನದ ಸುದ್ದಿ
ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ನಾಲ್ಕು ವರ್ಷ : 1059.92 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಪ್ರಗತಿ
ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್‌ಸಿಟಿ ಯೋಜನೆ ಪ್ರಾರಂಭವಾದಾಗಿನಿಂದ ಇಂದಿನವರೆಗೆ ನಗರದಲ್ಲಿ ರೂ.1059.92 ಕೋಟಿ ವೆಚ್ಚದಲ್ಲಿ 74 ಕಾಮಗಾರಿಗಳನ್ನು ರೂಪಿಸಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ದಾವಣಗೆರೆ ಸ್ಮಾರ್ಟ್‌ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಶರೀಫ್ ತಿಳಿಸಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್‌ಸಿಟಿ ಯೋಜನೆಗೆ ಆಯ್ಕೆಯಾಗಿ ಜೂ.25 ಕ್ಕೆ 4 ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ಸ್ಮಾರ್ಟ್‌ಸಿಟಿ ಲಿ, ಕಚೇರಿಯಲ್ಲಿ ಮಂಗಳವಾರ ಕರೆಯಲಾಗಿದ್ದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೂ.5.88 ಕೋಟಿಯಲ್ಲಿ 12 ಕಾಮಗಾರಿಗಳು ಮುಕ್ತಾಯಗೊಂಡಿವೆ. ರೂ. 549.06 ಕೋಟಿಯಲ್ಲಿ 41 ಕಾಮಗಾರಿಗಳು ಪ್ರಗತಿಯಲ್ಲಿವೆ. ರೂ.161.73 ಕೋಟಿಯಲ್ಲಿ 09 ಕಾಮಗಾರಿಗಳು ಟೆಂಡರ್ ಹಂತದಲ್ಲಿದ್ದು, ಡಿ.ಪಿ.ಆರ್ ಹಂತದಲ್ಲಿ ರೂ.353.25 ಕೋಟಿ ವೆಚ್ಚದಲ್ಲಿ 12 ಕಾಮಗಾರಿಗಳಿವೆ.ದಾವಣಗೆರೆ ಜಿಲ್ಲೆಯು ಸ್ಮಾರ್ಟ್‌ಸಿಟಿ ಯೋಜನೆಯಡಿ ಮೊದಲ ಹಂತದಲ್ಲೇ ಆಯ್ಕೆಯಾಗಿದ್ದು, ಈ ಯೋಜನೆಯಲ್ಲಿ ಎಬಿಡಿ ಹಾಗೂ ಪಾನ್‌ಸಿಟಿ ಎಂದು ಎರಡು ವಿಭಾಗ ಮಾಡಿ ನಗರದಾದ್ಯಂತ ಹಲವಾರು ಕಾಮಗಾರಿಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದರು.
ಮೊದಲ ಹಂತದಲ್ಲಿ ರೂ.1.39 ಕೋಟಿಯಲ್ಲಿ 9 ಪಾರ್ಕ್‌ಗಳು ಹಾಗೂ ಎರಡನೇ ಹಂತದಲ್ಲಿ 37 ಪಾರ್ಕ್‌ಗಳನ್ನು ಆಯ್ಕೆ ಮಾಡಿಕೊಂಡು ಪಾರ್ಕ್‌ನಲ್ಲಿ ಇ-ಶೌಚಾಲಯಗಳನ್ನು ಒಂದು ಯುರೋಪಿಯನ್ ಶೈಲಿ ಹಾಗೂ ಇನ್ನೊಂದು ಭಾರತೀಯ ಶೈಲಿಯಲ್ಲಿ ನಿರ್ಮಿಸಲಾಗುತ್ತಿದೆ. 1 ರಿಂದ 10 ರ ವರೆಗಿನ ನಾಣ್ಯ ಹಾಕಿದರೆ ಇ-ಶೌಚಾಲಯ ಬಾಗಿಲು ತೆರಯುತ್ತದೆ. ಪ್ರತಿ 5 ಜನರ ಉಪಯೋಗದ ನಂತರ ಸ್ವಯಂ ಚಾಲಿತವಾಗಿ ಒಳಗಡೆ ಫ್ಲೋರ್‌ನ್ನು ಸ್ವಚ್ಛಗೊಳಿಸುತ್ತದೆ ಎಂದರು.
ರೂ. 3.58 ಕೋಟಿಯಲ್ಲಿ ನಗರದ 52 ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಸ್ಮಾರ್ಟ್ ಬಸ್ ಶೆಲ್ಟರ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಎಲ್ಲಾ ಬಸ್‌ಗಳಿಗೆ ಜಿಪಿಎಸ್ ಅಳವಡಿಸಿ ಬಸ್ ಬರುವ ಸಮಯನ್ನು ಪ್ರದರ್ಶಿಸುವಂತೆ ಎಲ್‌ಇಡಿ ಫಲಕಗಳನ್ನು ಅಳವಡಿಸಲಾಗುವುದು. ರೂ. 25.41 ಕೋಟಿ ವೆಚ್ಚದಲ್ಲಿ ಹಳೇ ಬಸ್ ನಿಲ್ದಾಣದ ಪುನರಾಭಿವೃದ್ಧಿ ಕಾಮಗಾರಿಯನ್ನು ರೂಪಿಸಲಾಗಿದ್ದು, 21420.74 ಚ.ಮೀ. ವಿಸ್ತೀರ್ಣದಲ್ಲಿ ಕೆಳ ಮಹಡಿಯಲ್ಲಿ 92 ನಾಲ್ಕು ಚಕ್ರದ ವಾಹನ ಮತ್ತು 122 ದ್ವಿಚಕ್ರ ವಾಹನ ನಿಲುಗಡೆ ಹಾಗೂ ನೆಲ ಮಹಡಿಯಲ್ಲಿ 12 ಬಸ್ ನಿಲ್ಲುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ನಿಲ್ದಾಣದಲ್ಲಿ ಅಂಗಡಿಗಳು, ನಿರ್ವಹಣಾ ಕೊಠಡಿ, ಶೌಚಾಲಯ, ಸ್ನಾನದ ಕೊಠಡಿ, ರ‌್ಯಾಂಪ್, ಪ್ರಯಾಣಿಕರಿಗೆ ಆಸನದ ವ್ಯವಸ್ಥೆ, ಕುಡಿಯುವ ನೀರು, ಲಿಫ್ಟ್, ಬಸ್ ಸಂಚಾರದ ಫಲಕಗಳು ಹಾಗೂ ಭದ್ರತೆಗಾಗಿ ಸಿ.ಸಿ ಟಿವಿ ಅಳವಡಿಸಲಾಗುವುದು ಎಂದರು.
ಬೈಸಿಕಲ್ ಷೇರಿಂಗ್ ಸಿಸ್ಟಮ್ ಹಾಗೂ ಇ-ರಿಕ್ಷಾ: ನಗರದಲ್ಲಿ ಸಾರ್ವಜನಿಕರಿಗೆ ಪರಿಸರ ಸ್ನೇಹಿ ಮತ್ತು ಸುರಕ್ಷತೆ ಸಂಚಾರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರೂ.9.90 ಕೋಟಿಗಳಲ್ಲಿ ಸಾರ್ವಜನಿಕ ಬೈಸಿಕಲ್ ಷೇರಿಂಗ್ ಸಿಸ್ಟಮ್ ಅಳವಡಿಸಲಾಗುವುದು. 20 ಡಾಕಿಂಗ್ ಸ್ಟೇಷನ್ಸ್‌ಗಳಿದ್ದು, 100 ವಿದ್ಯುತ್ ಚಾಲಿತ ಮತ್ತು 100 ಸಾಮಾನ್ಯ ಬೈಸಿಕಲ್ ವ್ಯವಸ್ಥೆ ಮಾಡಲಾಗುವುದು. ಈ ಕಾಮಗಾರಿಗೆ ಈಗಾಗಲೇ ಗುತ್ತಿಗೆ ನೀಡಲಾಗಿದ್ದು, ಮುಂದಿನ 15 ರಿಂದ 20 ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿದೆ.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ಪರಿಸರ ಮಾಲಿನ್ಯ ಕಡಿಮೆ ಮಾಡುವ ದೃಷ್ಠಿಯಿಂದ ಹಾಗೂ ಉದ್ಯೋಗ ನೀಡುವ ಸಲುವಾಗಿ ಆಧುನಿಕ ತಂತ್ರಜ್ಞಾನವುಳ್ಳ ಬ್ಯಾಟರಿ ಚಾಲಿತ 80 ಆಟೋಗಳನ್ನು ಸ್ಥಳೀಯರಿಗೆ (60:40) ಸಬ್ಸಿಡಿ ಆಧಾರದಲ್ಲಿ ನೀಡಲಾಗುವುದು. ಈಗಾಗಲೇ ನಾಲ್ವರು ಮುಂದೆ ಬಂದಿದ್ದು, ಕೆಲವೇ ದಿನಗಳಲ್ಲಿ ಆಟೋಗಳನ್ನು ವಿತರಿಸಲಾಗುವುದು. ಮಹಿಳೆಯರಿಗೆ ಶೇ.75 ರಷ್ಟು ಸಬ್ಸಿಯಡಿಯಲ್ಲಿ ನೀಡಲಿದ್ದೇವೆ ಎಂದರು.
ಜಿಲ್ಲೆಯ ಸಾರ್ವಜನಿಕರ ಹಿತದೃಷ್ಠಿಯಿಂದ ರೂ.2.85 ಕೋಟಿಗಳಲ್ಲಿ ವಿದ್ಯುತ್ ಚಿತಾಗಾರವನ್ನು ನಿರ್ಮಿಸಲು ಚಿಂತಿಸಲಾಗಿದ್ದು, ಈ ಕುರಿತು ಸರ್ವೆ ಕಾರ್ಯ ನಡೆಯುತ್ತಿದೆ. ನಗರದಲ್ಲಿ ಜನರ ಆರೋಗ್ಯಾಭಿವೃದ್ಧಿ ಮತ್ತು ಮಕ್ಕಳ ಆಟಕ್ಕೆ ಅನುಕೂಲವಾಗುವಂತೆ ವ್ಯಾಯಾಮ ಶಾಲೆ ಮತ್ತು ಮಕ್ಕಳ ಆಟಿಕೆ ಉಪಕರಣಗಳನ್ನು ನಗರದ 16 ಉದ್ಯಾನವನಗಳಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಯಲ್ಲಿ ಬೈಸಿಕಲ್, ಸೀಟೆಡ್ ಚೆಸ್ಟ್ ಪ್ರಸ್, ಎಚ್‌ಡಿ ಸಿಟ್ ಆಫ್, ಎಚ್.ಡಿ. ಸ್ಕಾಟ್ ಪುಶಿಂಗ್, ಹೆಲ್ತ್ ವಾಕರ್ ಸೇರಿದಂತೆ ಮಕ್ಕಳ ಆಟಿಕೆ ಉಪಕರಣಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
ತುಂಗಾಭದ್ರ ನದಿಗೆ ಅಣೆಕಟ್ಟು ನಿರ್ಮಾಣ: ದಾವಣಗೆರೆ ನಗರಕ್ಕೆ 24*7 ಕುಡಿಯುವ ನೀರು ಒದಗಿಸಲು ತುಂಗಾಭದ್ರ ನದಿಗೆ 550 ಮೀ ಉದ್ದದ ಹಾಗೂ 2.5 ಮೀ ಅಗಲದ ಅಣೆಕಟ್ಟನ್ನು ರಾಜನಹಳ್ಳಿ ಜಾಕ್‌ವಲ್ ಬಳಿ ರೂ.76.11 ಕೋಟಿಯಲ್ಲಿ ನಿರ್ಮಿಸಲಾಗುವುದು. ಈ ಅಣೆಕಟ್ಟಿನಲ್ಲಿ 0.2 ಟಿಎಂಸಿ ನೀರು ಶೇಖರಣೆ ಮತ್ತು 50+5 ಸ್ವಯಂ ಚಾಲಿತ ಗೇಟ್ ನಿರ್ಮಾಣ ಮಾಡಲಾಗುವುದು. ಈ ಕಾಮಗಾರಿಯನ್ನು ಒಂದರೆಡು ತಿಂಗಳಿನಲ್ಲಿ ಪಾರಂಭಿಸಲಾಗುವುದು ಎಂದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವನ್ನು ರೂ.120 ಕೋಟಿಯಲ್ಲಿ ಅಭಿವೃದ್ಧಿಪಡಿಸಿ ಅದರಲ್ಲಿ ಮೂರು ಘಟಕಗಾಳಾಗಿ ಬಸ್ ಟರ್ಮಿನಲ್, ಕೆಎಸ್‌ಆರಟಿಸಿ ಕಚೇರಿ ಹಾಗೂ ಶಾಪಿಂಗ್ ಮಾಲ್ ಮತ್ತು ಚಿತ್ರ ಮಂದಿರ ನಿರ್ಮಿಸಲಾಗುವುದು. ಒಂದು ನೆಲಮಹಡಿ ಸೇರಿದಂತೆ 4 ಮಹಡಿಯ ಕಟ್ಟಡವನ್ನು ನಿರ್ಮಿಸಲಾಗುವುದು. 45 ಬಸ್‌ಗಳ ನಿಲುಗಡೆ ಹಾಗೂ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸಿ ಭದ್ರತೆಯ ದೃಷ್ಟಿಯಿಂದ ಸಿ,ಸಿ.ಕ್ಯಾಮಾರಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
ನಗರದ ಎಂಟು ಸರ್ಕಾರಿ ಕಚೇರಿಗಳ ಮೇಲ್ಚಾವಣಿಯಲ್ಲಿ ರೂ.2.21 ಕೋಟಿ ವೆಚ್ಚದಲ್ಲಿ ಸೋಲಾರ್ ಪ್ಯಾನಲ್ಸ್ ಅಳವಡಿಕೆ ಮಾಡಿ ಸೌರ ವಿದ್ಯುಚ್ಛಕ್ತಿಯನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ. ಇದರಿಂದ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಉಳಿತಾಯ ಮತ್ತು ಬೆಸ್ಕಾಂ ಇಲಾಖೆಗೆ ಪ್ರತಿ ಯೂನಿಟ್‌ಗೆ ಪಾವತಿಸುತ್ತಿದ್ದ ರೂ. 8.50 ಬದಲಿಗೆ ಪ್ರತಿ ಯೂನಿಟ್‌ಗೆ ರೂ. 5.90 ಗಳನ್ನು 25 ವರ್ಷಗಳವರೆಗೆ ಪಾವತಿಸಲು ನಿಗದಿಯಾಗಿರುತ್ತದೆ. ಹೆಚ್ಚುವರಿಯಾಗಿರುವ ವಿದ್ಯುಚ್ಛಕ್ತಿಯನ್ನು ಬೆಸ್ಕಾಂ ಇಲಾಖೆಗೆ ಮಾರಾಟ ಮಾಡಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಅಪರಾಧ ನಿಯಂತ್ರಿಸಲು, ಸ್ವಚ್ಚತೆ ಬಗ್ಗೆ ಮಾಹಿತಿ ಪಡೆಯಲು ಮತ್ತು ಸುರಕ್ಷತೆಯ ದೃಷ್ಠಿಯಿಂದ ಸಿ.ಸಿ ಟಿವಿ ಕ್ಯಾಮರಾಗಳನ್ನು ರೂ.74.84 ಕೋಟಿ ವೆಚ್ಚದಲ್ಲಿ ಅಳವಡಿಸಲಾಗುವುದು. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್, ಇಂಟಲಿಜೆಂಟ್ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿ, ಈ ಯೋಜನೆಯಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್‌ನಿಂದ ಸಾರ್ವಜನಿಕರಿಗೆ ಸಾರಿಗೆ ಮತ್ತು ತುರ್ತು ಸೇವೆಗಳ ಮಾಹಿತಿ ನೀಡುವುದು, ಆನ್‌ಲೈನ್ ಅಪ್ಲಿಕೇಷನ್‌ಗಳನ್ನು ನಿಯಂತ್ರಣದಲ್ಲಿಡುವ ವ್ಯವಸ್ಥೆ ಕಲ್ಪಿಸುವುದು, ವಾಯು ಮಾಲಿನ್ಯದ ಮಾಹಿತಿಗಾಗಿ ಸೆನ್ಸಾರ್‌ಗಳನ್ನು ಅಳವಡಿಸುವುದು ಸೇರಿದಂತೆ ಇ-ಕಲಿಕಾ ಕೇಂದ್ರದ ಮೂಲಕ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು. ಇ-ಆಡಳಿತ ಕಾರ್ಯಕ್ರಮದಲ್ಲಿ ಕಿಯೋಸ್ಕ್, ಒಂದು ನಗರ ಒಂದು ಸಂಖ್ಯೆ ಮತ್ತು ಇತರೆ ಸಾರ್ವಜನಿಕ ಸೇವೆಗಳನ್ನು ರೂಪಿಸಲಾಗಿದೆ ಹಾಗೂ ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ನಾಗರಿಕರಿಗೆ ಒದಗಿಸಲಾಗುವುದು ಎಂದರು.
ನಗರದ 10 ಸರ್ಕಾರಿ ಕಚೇರಿಗಳ ಆವರಣಗಳಲ್ಲಿ 2.42 ಕೋಟಿ ವೆಚ್ಚದಲ್ಲಿ ಡಿಸ್‌ಪ್ಲೇ ಬೋರ್ಡ್‌ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಮಾಹಿತಿ, ಹವಾಮಾನ ವರದಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ಹಲವು ಮಾಹಿತಿಗಳನ್ನು ನೇರ ಪ್ರಸಾರ ಮತ್ತು 19 ಸರ್ಕಾರಿ ಶಾಲೆಗಳಲ್ಲಿ 2.57 ಕೋಟಿ ವೆಚ್ಚದಲ್ಲಿ ಗಣಕಯಂತ್ರದ ಲ್ಯಾಬ್‌ಗಳನ್ನು ಒದಗಿಸಿ ಡಿಜಿಟಲ್ ತರಗತಿಗಳನ್ನು ಸ್ಥಾಪಿಸಲಾಗುವುದು ಎಂದರು.
ನಗರದಲ್ಲಿ ನಾಲ್ಕು ರಸ್ತೆಗಳನ್ನು ಸ್ಮಾರ್ಟ್ ರಸ್ತೆಗಳನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದ್ದು, ಕಾಮಗಾರಿಯು ಪೂರ್ಣಗೊಳ್ಳುವ ಹಂತದಲ್ಲಿವೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಈ ರಸ್ತೆಗಳಲ್ಲಿ ಮಳೆ ನೀರು ಪೈಪ್ ಚರಂಡಿ, ವಿದ್ಯುತ್, ದೂರವಾಣಿ ಯುಜಿಡಿ, ಗ್ಯಾಸ್ ನೀರಿನ ಪೈಪ್‌ಲೈನ್‌ಗಳನ್ನು ಭೂಗತವಾಗಿ ಸ್ಥಾಪಿಸಲಾಗುವುದು. ರಸ್ತೆಗಳ ಬದಿಯಲ್ಲಿ ಸುಂದರವಾದ ಮರಗಳನ್ನು ನೆಡುವುದರಿಂದ ಮತ್ತು ಎಲ್.ಇ.ಡಿ ಬೀದಿ ದೀಪಗಳನ್ನು ಅಳವಡಿಸುವುದರಿಂದ ಈ ರಸ್ತೆಗಳು ಸುಂದರವಾಗಿ ಕಾಣುತ್ತವೆ ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ಮುಖ್ಯ ಅಭಿಯಂತರ ಸತೀಶ್, ಮುಖ್ಯ ಹಣಕಾಸು ಅಧಿಕಾರಿ ಪ್ರಭಾವತಿ, ಟೀಮ್ ಲೀಡರ್ ಶ್ರೀನಾಥ್‌ರೆಡ್ಡಿ, ಜನರಲ್ ಮ್ಯಾನೇಜರ್ ಚಂದ್ರಶೇಖರ್, ಕಾರ್ಯಪಾಲಕ ಅಭಿಯಂತರ ಗುರಪಾದಯ್ಯ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.
ಹೇಳಿಕೆ
- ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ನಗರದ ಹೊರ ವಲಯದಲ್ಲಿರುವ ಗಾಜಿನ ಮನೆಗೆ ಶೌಚಾಲಯ ನಿರ್ಮಾಣ, ರೂ. 5 ಕೋಟಿ ವೆಚ್ಚದಲ್ಲಿ ಆಕರ್ಷಕ ಅಕ್ವೇರಿಯಂ, ಲೇಸರ್ ಶೋ, ಪ್ಲಾಂಟೇನ್ ಹಾಗೂ ಟಂಗಲ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ನಗರದಲ್ಲಿ ಪೊಲೀಸರ ನೈಟ್ ಬೀಟ್ ಬದಲಾಗಿ ದ್ರೋಣ್‌ಬೀಟ್ ಮಾಡಲು ಉದ್ದೇಶಿಸಿದ್ದ್ದು, ಇದು ನಿರ್ಮಾಣವಾದರೆ ಪೊಲೀಸರಿಗೆ ರಾತ್ರಿ ವೇಳೆ ಬೀಟ್ ಮಾಡವುದು ತಪ್ಪಲಿದೆ. ಈ ಯೋಜನೆ ಸಾಕಾರಗೊಂಡರೆ ಇದು ದೇಶದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ನಗರದಲ್ಲಿ ಸಾರ್ಟ್‌ಸಿಟಿ ಯೋಜನೆಯಲ್ಲಿ ನಡೆಯುತ್ತಿರುವ ಹಾಗೂ ಮುಂದೆ ನಡೆಯಲಿರುವ ಕಾಮಗಾರಿ ಬಗ್ಗೆ ಊಹಾಪೋಹಗಳಿಗೆ ಕಿವಿಕೊಡಬೇಡಿ. ಎಲ್ಲಾ ಕಾಮಗಾರಿಗಳು ಗುಣಮಟ್ಟ ಮತ್ತು ತ್ವರಿತ ಗತಿಯಲ್ಲಿ ನಡೆಯುವಂತೆ ಹಾಗೂ ಯಾವುದೇ ಅವ್ಯವಹಾರಗಳು ನಡೆಯದಂತೆ ಕ್ರಮ ವಹಿಸಲಾಗುವುದು.
|ದಾವಣಗೆರೆ ಸ್ಮಾರ್ಟ್‌ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ, ಶರೀಫ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.
ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.
ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.
ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.
ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.
ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ…
ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.
ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?
ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.
ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.
ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ನಿಮ್ಮದು ದರೋಡೆಕೋರ ಸರಕಾರವಲ್ಲವೇ?
ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..
ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ3 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ3 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ3 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ2 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ2 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

