ಬಹಿರಂಗ
ನಮಗೆ ಬೇಕಿದೆ ಅಂಬೇಡ್ಕರರ ಘನತೆಯ ಬದುಕು
- ರಘೋತ್ತಮ ಹೊ.ಬ
ಘನತೆಯ ಬದುಕು: ಹಾಗೆಂದರೇನು ಎಂದರೇನು ಎಂದು ತಿಳಿಯುವ ಮುನ್ನ ಬಾಬಾಸಾಹೇಬ್ ಅಂಬೇಡ್ಕರ್ ರವರ ವೃತ್ತಿ ಬದುಕು ಹೇಗಿತ್ತು ಎಂಬುದನ್ನು ತಿಳಿಯುವ ಅಗತ್ಯವಿದೆ. ಇದರ ಬಗ್ಗೆ ಸ್ವತಃ ಅಂಬೇಡ್ಕರ್ರವರರೇ ಹೇಳಿಕೊಂಡಿರುವ ಬರಹಗಳ ಆಧಾರದ ಮೇಲೆ ಹೇಳುವುದಾದರೆ ವಿದೇಶಿ ವ್ಯಾಸಂಗ ಮುಗಿಸಿ 1919ರಲ್ಲಿ ಭಾರತಕ್ಕೆ ಆಗಮಿಸಿದ ಅವರು ಪ್ರಪ್ರಥಮವಾಗಿ ಮುಂಬೈನ ಸರ್ಕಾರಿ ಕಾಮರ್ಸ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ನೇಮಕಗೊಂಡರು. ಆ ಮೂಲಕ ಕಾಲೇಜಿನ ಬೋಧಕರಾಗಿ ತಮ್ಮ ವೃತ್ತಿ ಬದುಕು ಆರಂಭಿಸಿದರು.
ಅಲ್ಲಿನ ಕೆಲ ವರ್ಷಗಳ ಸೇವೆಯ ನಂತರ ಸರ್ಕಾರಿ ಹುದ್ದೆಯಲ್ಲಿದ್ದರೆ ಸಾರ್ವಜನಿಕ ಸೇವೆ ಕಷ್ಟ ಎಂಬುದನ್ನು ಅರಿತ ಅವರು ಸೇವೆಗೆ ರಾಜೀನಾಮೆ ಇತ್ತು ಮತ್ತೆ ಇಂಗ್ಲೆಂಡ್ಗೆ ತೆರಳಿ ಕಾನೂನಿನಲ್ಲಿ ‘ಬಾರ್ ಅಟ್ ಲಾ’ (ಬ್ಯಾರಿಸ್ಟರ್) ಪದವಿ ಪಡೆದು ಮುಂಬೈನ ಹೈಕೋರ್ಟ್ ನಲ್ಲಿ ತಮ್ಮ ವಕೀಲ ವೃತ್ತಿ ಆರಂಭಿಸಿದರು ಮತ್ತು ಆ ವೃತ್ತಿಯನ್ನು ತಮ್ಮ ಜೀವನದುದ್ದಕ್ಕೂ ಮುಂದುವರೆಸಿದರು. ಈ ನಡುವೆ ಮುಂಬೈನ ಸರ್ಕಾರಿ ಕಾನೂನು ಕಾಲೇಜಿನ ಪ್ರಿನ್ಸಿಪಾಲರಾಗಿ ನೇಮಕಗೊಂಡು ಮತ್ತೆ ತಮ್ಮ ನೆಚ್ಚಿನ ಬೋಧನಾ ವೃತ್ತಿಗೆ ಮರಳಿದ ಅವರು ಆ ಹುದ್ದೆಯಲ್ಲಿ 5 ವರ್ಷಗಳ ಸೇವೆಯನ್ನು ಕೂಡ ಪೂರ್ಣಗೊಳಿಸಿದರು ಜೊತೆಜೊತೆಗೆ ವಕೀಲ ವೃತ್ತಿಯನ್ನೂ ಮುಂದುವರೆಸಿದರು.
1935ರ ಭಾರತ ಸರ್ಕಾರ ಕಾಯ್ದೆಯನ್ವಯ ಮುಂಬೈನಲ್ಲಿ ಮುಂಬೈ ರಾಜ್ಯ ವಿಧಾನಸಭೆ ಸ್ಥಾಪಿತವಾಗಿ 1937ರಲ್ಲಿ ಅದಕ್ಕೆ ಚುನಾವಣೆ ನಡೆಯಲು ಮತ್ತೊಮ್ಮೆ ತಮ್ಮ ಸರ್ಕಾರಿ ಸೇವೆಗೆ ರಾಜೀನಾಮೆ ಇತ್ತ ಅಂಬೇಡ್ಕರ್ರವರು ಮುಂಬೈ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಿ ಸದಸ್ಯರಾಗಿ(ಇಂದಿನ ಎಂ.ಎಲ್.ಎ ಸ್ಥಾನಕ್ಕೆ ಸಮ) ಆಯ್ಕೆಗೊಂಡರು. ಇಂತಹ ಆಯ್ಕೆಯ ಕಾರಣಕ್ಕೆ ಅಂಬೇಡ್ಕರ್ರವರು 1942ರಲ್ಲಿ ಬ್ರಿಟಿಷರ ನೇತೃತ್ವದ ಕೇಂದ್ರ ಸರ್ಕಾರದ ಸಚಿವರಾಗಿ ನೇಮಕಗೊಂಡು ಕಾರ್ಮಿಕ, ಉದ್ಯೋಗ, ಕೌಶಲ, ಲೋಕೋಪಯೋಗಿ, ನೀರಾವರಿ ಮತ್ತು ವಿದ್ಯುತ್ ಇಲಾಖೆಗಳ ಸಚಿವರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದರು. ಈ ನಡುವೆ 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಅಂದಿನ ನೆಹರೂರವರ ಕೇಂದ್ರ ಸರ್ಕಾರದಲ್ಲಿ ಕಾನೂನು ಸಚಿವರಾಗಿ ನೇಮಕಗೊಂಡ ಅವರು ತತ್ಪರಿಣಾಮ ಸಂವಿಧಾನ ರಚಿಸಿದರು. ಆದರೆ 1951ರಲ್ಲಿ ಅವರು ಮಂತ್ರಿ ಪದವಿಗೆ ರಾಜೀನಾಮೆ ಇತ್ತರಾದರೂ ಮರು ವರ್ಷವೇ ಅಂದರೆ 1952ರಲ್ಲಿ ನಡೆದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋತರು. ಅಂದಹಾಗೆ ಸೋತರೂ ಎದೆಗುಂದದ ಅವರು 1952 ರಲ್ಲೇ ಮುಂಬೈನಿಂದ ರಾಜ್ಯಸಭಾ ಸದಸ್ಯರಾಗಿ(ಎಂಪಿ ಆಗಿ) ಆಯ್ಕೆಗೊಂಡು ಸಂಸತ್ ಪ್ರವೇಶಿಸಿದರು. ತಮ್ಮ ಪರಿನಿಬ್ಬಾಣದವರೆಗೂ ಅವರು ರಾಜ್ಯ ಸಭೆಯ ಸದಸ್ಯರಾಗಿಯೇ ಮುಂದುವರೆದರು.
ಇಷ್ಟೆಲ್ಲಾ ರಾಜಕೀಯ ವೃತ್ತಿ ಸಾಧನೆಯ ನಡುವೆಯೂ ಅಂಬೇಡ್ಕರ್ರವರು ತಮ್ಮ ವೃತ್ತಿ ವಕೀಲ ವೃತ್ತಿಯನ್ನು ಬಿಟ್ಟಿರಲಿಲ್ಲ. ಸುಪ್ರಸಿದ್ಧ ವಕೀಲರಾಗಿ ಗುರುತಿಸಿಕೊಂಡಿದ್ದ ಅವರು ಅದಕ್ಕಾಗಿ ತಮ್ಮ ಕಕ್ಷಿದಾರರಿಗೆ ವಿಧಿಸುತ್ತಿದ್ದ ಶುಲ್ಕವೇ ಅವರು ತಮ್ಮ ವಕೀಲ ವೃತ್ತಿಯಲ್ಲಿ ಅವರು ಅದೆಷ್ಟು ಖ್ಯಾತಿಯನ್ನು ಪಡೆದಿದ್ದರು ಎಂಬುದನ್ನು ಸೂಚಿಸುತ್ತದೆ. ಈ ನಡುವೆ ಶೈಕ್ಷಣಿಕ ವಲಯದಲ್ಲಿಯೂ ಗುರುತಿಸಿಕೊಂಡ ಅವರು ತಾವೇ ಸ್ಥಾಪಿಸಿದ್ದ “ಪೀಪಲ್ಸ್ ಎಜುಕೇಷನ್ ಸೊಸೈಟಿ”ಯ ಮೂಲಕ ಸುಮಾರು 27ಕ್ಕೂ ಹೆಚ್ಚು ಶಾಲಾ ಕಾಲೇಜುಗಳನ್ನು ನಡೆಸಿದರು.
ಅಂಬೇಡ್ಕರ್ ರವರು ಖ್ಯಾತ ಇಂಗ್ಲಿಷ್ ಲೇಖಕರು ಎಂಬುದೂ ಇಲ್ಲಿ ಗಮನಿಸಬೇಕಾದ ವಿಷಯ. ಯಾವ ಮಟ್ಟಿಗಿನ ಖ್ಯಾತಿ ಎಂದರೆ ಲಂಡನ್ನಿನ ಅಂದಿನ ಸುಪ್ರಸಿದ್ಧ ಪಿ.ಎಸ್.ಕಿಂಗ್ ಪಬ್ಲಿಷಿಂಗ್ ಹೌಸ್ ಅವರ ಬಹುತೇಕ ಕೃತಿಗಳನ್ನು ಪ್ರಕಟಿಸಿದೆ! ಹಾಗೆಯೇ ಕೊನೆ ಕೊನೆಯಲ್ಲಿ ಲಂಡನ್ನಿಗೆ ಹೋಗುವುದು ಕಷ್ಟವೆನಿಸಿದಾಗ ಸ್ವತಃ ಅಂಬೇಡ್ಕರ್ರವರೇ ಭರತ್ ಭೂಷಣ್ ಪ್ರಿಂಟಿಂಗ್ ಪ್ರೆಸ್ ಎಂಬ ಮುದ್ರಣ ಸಂಸ್ಥೆ ಆರಂಭಿಸಿ ಮುದ್ರಣ ಕ್ಷೇತ್ರಕ್ಕೂ ಕೂಡ ಕಾಲಿಡುತ್ತಾರೆ. ಆಶ್ಚರ್ಯವೆಂದರೆ ತಮ್ಮ ಇಂತೆಲ್ಲಾ ವೃತ್ತಿ ವೈವಿಧ್ಯತೆಯ ನಡುವೆಯೂ ಮಾಧ್ಯಮ ಕ್ಷೇತ್ರದಲ್ಲಿಯೂ ತೊಡಗಿಸಿಕೊಳ್ಳುವ ಅವರು ‘ಜನತಾ’, ‘ಬಹಿಷ್ಕೃತ ಭಾರತ’, ‘ಪ್ರಬುದ್ಧ ಭಾರತ’ ಹೀಗೆ ಮೂರು ಪತ್ರಿಕೆಗಳನ್ನು ಸ್ಥಾಪಿಸಿ ಅವುಗಳ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಹಾಗಿದ್ದರೆ ಯಾಕೆ ಬಾಬಾಸಾಹೇಬ್ ಅಂಬೇಡ್ಕರ್ರವರ ಇಂತಹ ಭವ್ಯ ವೃತ್ತಿ ಬದುಕಿನ ಬಗ್ಗೆ ತಿಳಿದುಕೊಳ್ಳಬೇಕಾಗಿದೆ? ಎಂಬುದು. ಏಕೆಂದರೆ ಅನೇಕರು ಸೋಮಾರಿತನದ ಬದುಕು ಬಯಸುತ್ತಾರೆ. ತಾನು ಓದಿಲ್ಲವೆ ತನಗೆ ಸರ್ಕಾರ ಕರೆದು ನೌಕರಿ ಕೊಡಲಿ ಎಂದು ಕಾದು ಕೊಳಿತುಕೊಳ್ಳುತ್ತಾರೆ ವಿಶೇಷವಾಗಿ ಶೋಷಿತ ಸಮುದಾಯಗಳ ಕೆಲವು ನಿರುದ್ಯೋಗಿ ವಿದ್ಯಾವಂತ ಸಮುದಾಯ! ಪ್ರಶ್ನೆ ಎಂದರೆ ಅಂಬೇಡ್ಕರರು ಹಾಗೆ ಕಾದು ಕುಳಿತರೆ? ಖಂಡಿತ ಇಲ್ಲ. ಹಾಗೆಯೇ ಕೆಲವರು “ಅಂಬೇಡ್ಕರರು ಕೋಟು ಧರಿಸುತ್ತಿದ್ದರು ಏಕೆಂದರೆ ಅವರು ತಮ್ಮ ಹರಿದ ಅಂಗಿಗಳನ್ನು ಮುಚ್ಚಲು ಹಾಗೆ ಕೋಟು ಧರಿಸುತ್ತಿದ್ದರು” ಎಂದು ಕತೆ ಕಟ್ಟುತ್ತಾರೆ, ಹೇಳುತ್ತಾರೆ. ಆದರೆ ವಾಸ್ತವವೆಂದರೆ ಅಂಬೇಡ್ಕರರು ತಮ್ಮ ಇಂತಹ ವೈಭವಪೂರ್ಣ ವೃತ್ತಿ ಬದುಕಿನ ಕಾರಣಕ್ಕಾಗಿ ಮತ್ತು ಅದರಿಂದ ಅವರು ಗಳಿಸಿದ ಸಂಪಾದನೆಯ ಕಾರಣಕ್ಕಾಗಿ ಮುಂಬೈನಲ್ಲಿ ಎರಡು ಮನೆ ದೆಹಲಿಯಲ್ಲಿ ಒಂದು ಮನೆ ಕಟ್ಟಿಸಿದ್ದರು! ವಯಕ್ತಿಕವಾಗಿ ಅತ್ಯಂತ ಶಿಸ್ತಿನ ಒಂದು ಸ್ಟ್ಯಾಂಡರ್ಡ್ ಬದುಕನ್ನು ತಮ್ಮ ವಿದ್ಯೆ, ಪದವಿ ಮತ್ತು ಸ್ಥಾನಕ್ಕೆ ತಕ್ಕಹಾಗೆ ಬದುಕಿದರು! ದುರಂತವೆಂದರೆ ಇಂತಹ ಅಂಬೇಡ್ಕರ್ರವರು ಬದುಕಿದ ಸ್ಟ್ಯಾಂಡರ್ಡ್ ಬದುಕನ್ನು ಬಹುತೇಕರು ಅರಿಯಲೇ ಹೋಗುವುದಿಲ್ಲ. ತಾವು ಸದಾ ಕೀಳು, ತಮ್ಮ ಕೈಯಲ್ಲಿ ಏನೂ ಆಗುವುದಿಲ್ಲ ಎಂಬ ಕೆಟ್ಟ ಮನಸ್ಥಿತಿಯಲ್ಲೇ ಬದುಕುತ್ತಾರೆ.
ಈ ನಿಟ್ಟಿನಲ್ಲಿ ಎಲ್ಲರೂ ವಿಶೇಷವಾಗಿ ಶೋಷಿತ ಸಮುದಾಯಗಳ ಮಂದಿ ಒಂದು ಘನತೆಯ ಸ್ಟ್ಯಾಂಡರ್ಡ್ ಬದುಕನ್ನು ಕಟ್ಟಿಕೊಳ್ಳಲು ಬಾಬಾಸಾಹೇಬರನ್ನು ಅನುಕರಿಸಿಬೇಕಿದೆ ಅನುಸರಿಸಬೇಕಿದೆ. ಆಗಷ್ಟೆ ಅವರಲ್ಲಿ ಕೀಳರಿಮೆ ತೊಲಗಿ ಅವರು ತಲೆ ಎತ್ತಿ ಬದುಕಲು ಸಾಧ್ಯ. ಆದ್ದರಿಂದ ಶೋಷಿತ ಸಮುದಾಯಗಳ ಯುವಕರು ಯುವತಿಯರು ಜನಸಾಮಾನ್ಯರು ಅಂಬೇಡ್ಕರರ ಈ ವೈಭವಪೂರ್ಣ ಘನತೆಯ ಬದುಕನ್ನು ಅರಿಯಲಿ ತಾವೂ ಕೂಡ ಅಂತಹ ಘನತೆಯ ಬದುಕನ್ನು ಬಾಳಲಿ ಎಂಬುದೇ ಸದ್ಯದ ಕಳಕಳಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.



