Connect with us

ಭಾವ ಭೈರಾಗಿ

ಕನಸುಗಳ ವ್ಯಾಖ್ಯಾನ..!

Published

on

  • ಕ್ರಾಂತಿರಾಜ್ ಒಡೆಯರ್, ಪ್ರಾಧ್ಯಾಪಕರು, ಮೈಸೂರು

ಲವು ಜನರು ತಮ್ಮ ನಿದ್ರಾವಸ್ಥೆಯಲ್ಲಿ ಕನಸುಗಳನ್ನು ಕಂಡು, ಅವು ನೆನಪಿದ್ದರೆ, ಅವುಗಳನ್ನು ಶುಭ ಕನಸುಗಳು ಹಾಗು ಕೆಟ್ಟ ಕನಸುಗಳೆಂದು ವಿಂಗಡಿಸಿ, ಒಳ್ಳೆಯ ಕನಸುಗಳನ್ನು ಕಂಡಿದ್ದರೆ, ನಂತರದ ದಿನಗಳಲ್ಲಿ ಒಳ್ಳೆಯದಾಗುವುದೆಂದು, ಕೆಟ್ಟ ಕನಸುಗಳನ್ನು ಕಂಡಿದ್ದರೆ, ಅದು ಪಾಪವೆಂದೂ, ಮುಂದೊಂದು ದಿನ ಏನಾದರು ಕೇಡು ಕಾದಿದೆಯೆಂದು ತಿಳಿದು, ಪಾಪ ಕಳೆದುಕೊಳ್ಳಲು ಅಥವಾ ಕೇಡಿನಿಂದ ಪಾರಾಗಲು, ದೇವಸ್ಥಾನಗಳಿಗೋ ಅಥವಾ ದೇವಮಾನವರ ಬಳಿಗೋ ಹೋಗಿ ಪೂಜೆ, ಹೋಮ, ಹವನ ಮಾಡಿಸಿ, ಪಾಪ ಅಥವಾ ಕೇಡಿನಿಂದ ಪಾರಾದವೆಂಬ ನಂಬಿಕೆಯಿಂದ ನಿಟ್ಟ್ಟುಸಿರು ಬಿಡುವುದನ್ನು ನಾನು ಹಲವರಿಂದ ಕೇಳಿದ್ದು ಅಲ್ಲದೇ ಕೆಲವು ಸ್ನೇಹಿತರು ನನ್ನ ಬಳಿಯೂ ಪ್ರಸ್ತಾಪ ಮಾಡಿದ್ದೂ ಇದೆ.

ಇಂತಹವರ ನಂಬಿಕೆಗಳು ಮಾಹಿತಿ ಮತ್ತು ಜ್ಞಾನದ ಕೊರತೆಯಿಂದ ಕೂಡಿದ್ದು, ಕನಸುಗಳನ್ನು ಮೂಢನಂಬಿಕೆಯ ದೃಷ್ಟಿಯಲ್ಲಿ ನೋಡದೇ, ವೈಜ್ಞಾನಿಕ ತಳಹದಿಯಲ್ಲಿ ನೋಡಬೇಕೆಂಬುದು ಈ ಒಂದು ಲೇಖನದ ಉದ್ದೇಶ.

ಕನಸುಗಳ ಬಗ್ಗೆ 1899 ರಲ್ಲಿ ಆಸ್ಟ್ರಿಯಾ ದೇಶದ ಖ್ಯಾತ ಮನೋಶಾಸ್ತ್ರಜ್ಞ ಸಿಗ್ಮನ್ದ್ದ್ ಫ್ರಾಯ್ಡ್ ಅವರು ತಮ್ಮ ಸುಧೀರ್ಘ ಸಂಶೋಧನೆಯ ಮೂಲಕ ಕನಸುಗಳ ಮೂಲ ಮತ್ತು ಅವುಗಳ ಅರ್ಥವನ್ನು ‘INTERPRETATION OF DREAMS‘ ಎಂಬ ಪುಸ್ತಕದ ಮೂಲಕ ಇಡೀ ವಿಶ್ವಕ್ಕೇ ತಿಳಿಸಿಕೊಟ್ಟಿದ್ದಾರೆ. ಅವರ ಪ್ರಕಾರ, ಮನುಷ್ಯರು ತಮ್ಮ ಸುಪ್ತ ಮನಸಿನಲ್ಲಿ ಅಡಗಿಸಿಟ್ಟ ಬಯಕೆಗಳು, ನಿದ್ರಾವಸ್ಥೆಯಲ್ಲಿ ಕನಸುಗಳಾಗಿ ಬರುವುವೆಂದೂ, ಅವು, ನಾವು ಶಾಂತಿಯುತವಾಗಿ ನಿದ್ರಿಸಲು ಸಹಾಯಕರಾಗಿ ಅಥವಾ ರಕ್ಷಕರಾಗಿ ಕಾರ್ಯ ನಿರ್ವಹಿಸುವುವುವೆಂದೂ ತಮ್ಮ ಸಂಶೋಧನೆಯಲ್ಲಿ ತಿಳಿಸಿದ್ದಾರೆ. ಮನುಷ್ಯರಿಗೆ ಕನಸು ಬೀಳುವುದು ಸಹಜ ಪ್ರಕ್ರಿಯೆಯಾಗಿದ್ದು, ಕನಸು ಬೀಳುವ ಮನುಷ್ಯರು ಆರೋಗ್ಯಕರ ಮನಸ್ಸನ್ನು ಹೊಂದಿರುತ್ತಾರೆ.

ಹಾಗೆಯೇ ಕನಸೇ ಬೀಳದ ಮನುಷ್ಯರು ಆರೋಗ್ಯಕರ ಮನಸ್ಸನ್ನು ಹೊಂದಿರುವುದಿಲ್ಲವೆಂದು ತಮ್ಮ ಸಂಶೋಧನೆಯಲ್ಲಿ ತಿಳಿಸಿದ್ದಾರೆ.
ಸಹಜವಾಗಿ ಕನಸುಗಳು ನಿದ್ರಾವಸ್ಥೆಯಲಿ ನಾವು ಉಪಪ್ರಜ್ಞಾಸ್ಥಿತಿಯಲ್ಲಿ ಇರುವಾಗ ಬರುವುವು. ಹಾಗೆಯೇ, ಶಾಂತ ಮನಸ್ಥಿತಿಯಲ್ಲಿ ಇರುವ ವ್ಯಕ್ತಿಗಳಿಗೆ ಮಾತ್ರ ಕನಸುಗಳು ಬರುವುದು.

ಪ್ರಜ್ಞಾಸ್ಥಿತಿಯಲ್ಲಿ ಇರುವಾಗ, ಹಾಗೆಯೇ ಅಶಾಂತ ಮನಸ್ಥಿತಿಯಲ್ಲಿ ಇರುವ ವಕ್ತಿಗಳಿಗೆ ಕನಸುಗಳು ಬರುವುದಿಲ್ಲ. ಇದರ ಅರ್ಥ, ಮನುಷ್ಯರು ತುಂಬಾ ದಣಿದಿದ್ದಾಗ ಅಥವಾ ಮದ್ಯಪಾನ ಮಾಡಿದಾಗ, ಅವರ ದೇಹ ಶಾಂತ ಸ್ಥಿತಿಗೆ ಹೋಗಿ, ಆ ಸಂದರ್ಭದಲ್ಲಿ ಅವರು ನಿದ್ರಾವಸ್ಥೆಗೆ ಹೋದಾಗ ಕನಸುಗಳು ಬರುವುದು ಗ್ಯಾರಂಟಿ.

ನಮಗೆ ಎಂತಹ ಕನಸುಗಳು ಬೀಳುತ್ತವೆಯೆಂದು ಅವಲೋಕಿಸಿ ನೋಡಿದಾಗ, ಅವು ಲೈಂಗಿಕವಾಗಿದ್ದು, ಅಂದರೆ, ವ್ಯಕ್ತಿಗೆ ಅಥವಾ ವ್ಯಕ್ತಿಗಳಿಗೆ ಸಂಭದಿಸಿದ್ದಾಗಿರುತ್ತವೆ. ಆ ವ್ಯಕ್ತಿ ಅಥವಾ ವ್ಯಕ್ತಿಗಳು ನಮಗೆ ಬಹಳ ಹತ್ತಿರದವರಾಗಿದ್ದು, ಕುಟುಂಬದ ಸದಸ್ಯರೊ, ಸ್ನೇಹಿತರೋ, ನಾವು ಕೆಲಸ ಮಾಡುವ ವಾತಾವರಣಕ್ಕೆ ಸಂಬಂಧಿಸಿದವರೋ, ನಮ್ಮ ವೈರಿಗಳೋ, ನಾವು ಜೀವನದಲ್ಲಿ ಹೆದರಿಕೊಳ್ಳುವ ವ್ಯಕ್ತಿಯೋ ಅಥವಾ ಪ್ರೀತಿಸುವವರೋ ಆಗಿರುತ್ತಾರೆ. ಮತ್ತು ಕನಸಿನಲ್ಲಿ ಬರುವ ಘಟನೆಗಳು ನಮ್ಮ ಜೀವನದಲ್ಲಿ ನೆಡೆದಿರುವುವೇ ಅಥವಾ ನಮ್ಮ ಆಲೋಚನೆಯಲ್ಲಿ ಬಂದಿರುವುವೇ ಆಗಿರುತ್ತವೆ.

ವ್ಯಕ್ತಿಗಳು ಅಥವಾ ಘಟನೆಗಳು ಕನಸಿನಲ್ಲಿ ಬರುವ ರೀತಿಯನ್ನು ಅವಲೋಕಿಸುವುದಾದರೆ, ಮನುಷ್ಯರು ಹೇಗಿದ್ದಾರೋ ಹಾಗೆಯೇ ಕಾಣಿಸಿಕೊಳ್ಳಬಹುದು ಅಥವಾ ಅವರ ದೇಹದ ಯಾವುದಾದರೊಂದು ಭಾಗ ಮಾತ್ರ ಕಾಣಿಸಬಹುದು ಅಥವಾ ಅವರು ಇರುವುದಕ್ಕಿಂತ ದಪ್ಪ ಅಥವಾ ಸಣ್ಣ ಆಕಾರಗಲ್ಲಿ ಕಾಣಿಸಿಕೊಳ್ಳಬಹುದು. ಇನ್ನೊಂದು ರೀತಿಯಲ್ಲಿ ನೋಡುವುದಾದರೆ, ಯಾವುದಾದರೂ ವಿಕಾರ ಚಿತ್ರ ಅಥವಾ ಭಯಂಕರ ಆಕಾರ ಅಥವಾ ಯಾವುದಾದರೊಂದು ವಸ್ತು ಅಥವಾ ನಾವು ಭಯಪಡುವ ವಸ್ತು ಕನಸಿನಲ್ಲಿ ಘಟನೆಗಳ ಜೊತೆ ಬರುತ್ತವೆ.

ಅವು ಕೆಟ್ಟ ಘಟನೆಗಳು ಆಗಿರಬಹುದು ಅಥವಾ ಸಂತೋಷ ಪಡುವ ಘಟನೆಗಳೂ ಆಗಿರಬಹುದು. ಒಟ್ಟಿನಲ್ಲಿ, ಆ ವ್ಯಕ್ತಿಗಳು ಅಥವಾ ಘಟನೆಗಳೂ ನಮ್ಮ ಸುಪ್ತ ಮನಸಿನಲ್ಲಿ ಅಡಗಿದ್ದು, ಕನಸಿನ ಮೂಲಕ ಬರಬಹುದು ಅಥವಾ ಅಡಗಿರುವ ಬಯಕೆಗಳನ್ನು ಸ್ವೀಕರಿಸಲು ಮನಸ್ಸು ಒಪ್ಪದಿದ್ದಾಗ ಹಾಗು ಅವುಗಳ ಬಗ್ಗೆ ಪಾಪಪ್ರಜ್ಞೆ ಕಾಡಿದಾಗ, ಆ ವ್ಯಕ್ತಿಗಳ ಹಾಗು ವಸ್ತುಗಳ ಬಗ್ಗೆ ಮನಸ್ಸಿನಲ್ಲಿ ಅಡಗಿರುವ ಬಯಕೆಗಳು ಬೇರೆ ರೂಪ ತಾಳಿ ಕಾಣಿಸಿಕೊಳ್ಳುತ್ತವೆ.

ಹಾಗಾದರೆ ಈ ಕನಸುಗಳನ್ನು ಓದುವುದು ಹೀಗೆ ಎಂದು ಅವಲೋಕಿಸಿದಾಗ, ವ್ಯಕ್ತಿಗಳು ಹಾಗು ಘಟನೆಗಳೂ ಸಹಜ ರೂಪದಲ್ಲಿ ಬಂದರೆ, ಕನಸುಗಳನ್ನು ಅರ್ಥಮಾಡಿಕೊಳ್ಳುವು ಸುಲಭ. ಆದರೆ, ವಿಕಾರ ರೂಪದಲ್ಲೋ, ಯಾವುದೋ ವಸ್ತುವಿನ ರೂಪದಲ್ಲೋ, ಕೆಟ್ಟ ಹಾಗು ಒಳ್ಳೆಯ ಸಂದರ್ಭದ ರೂಪದಲ್ಲೋ ಅಥವಾ ಸಂಬಂಧವಿಲ್ಲದ ರೂಪದಲ್ಲೋ ಬಂದರೆ, ಕನಸನ್ನು ಅರ್ಥ ಮಾಡಿಲೊಳ್ಳುವುದು ಕಷ್ಟ. ಆದರೆ, ಅವುಗಳನ್ನು ಅರ್ಥ ಮಾಡಿಕೊಳ್ಳಲು ಸಿಗ್ಮನ್ಡ್ ಫ್ರಾಯ್ಡ್ ಅವರು ಸುಲಭ ವಿಧಾನವನ್ನು ತಿಳಿಸಿದ್ದಾರೆ.

ಉದಾಹರಣೆಗೆ: ನನ್ನ ಗೆಳೆಯ, “ಅವನಿಗೆ ಹಲವು ಬಾರಿ ತನ್ನ ಕುಟುಂಬದ ಕೆಲವು ಸದಸ್ಯರೊಡನೆ ಅಂದರೆ, ತನ್ನ ತಾಯಿ, ತಂಗಿ, ಅಕ್ಕ, ಚಿಕ್ಕಪ್ಪ ಹಾಗು ದೊಡ್ಡಪ್ಪನ ಮಗಳ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಹಾಗೆ ಕನಸಿನಲ್ಲಿ ಬರುತ್ತಿರುವುದಾಗಿ ಹೇಳಿ ತನ್ನ ಬಗ್ಗೆಯೇ ಅಸಯ್ಯ ಪಟ್ಟಿಕೊಂಡನು”. ಅದಕ್ಕೆ ಪ್ರತಿಕ್ರಿಯಿಸುತ್ತಾ ನಾನು, “ಆ ಕನಸುಗಳ ಬಗ್ಗೆ ಅಸಯ್ಯ ಪಟ್ಟಿಕೊಳ್ಳುವಂತದ್ದು ಏನೂ ಇಲ್ಲ. ಯಾವುದೋ ಸಂದರ್ಭದಲ್ಲಿ ಅವರ ದೇಹದ ಸೂಕ್ಷ್ಮ ಭಾಗಗಳನ್ನು ತಪ್ಪಿ ನೋಡಿದ್ದು, ಅಥವಾ ಕೆಲವು ಸಂದರ್ಭಗಳಲ್ಲಿ ಕೆಟ್ಟ ಆಲೋಚನೆಗಳಿಂದ ಅವರ ಬಗ್ಗೆ ಯೋಚಿಸಿದ್ದರೆ ಅದು ಸುಪ್ತ ಮನಸ್ಸಿನಲ್ಲಿ ಅಡಗಿದ್ದು, ಕನಸಿನಲ್ಲಿ ಗೊತ್ತಿಲ್ಲದೆಯೇ ಬರುತ್ತದೆ.

ಅದನ್ನು ವೈಜ್ಞಾನಿಕವಾಗಿ ಆಲೋಚಿಸಬೇಕೇ ಹೊರತು ಅದರ ಬಗ್ಗೆ ಅಸಯ್ಯ ಪಟ್ಟಿಕೊಳ್ಳಬಾರದೆಂದು” ಹೇಳಿದಾಗ ಸ್ವಲ್ಪ ಸಮಾಧಾನವಾದನು. ಹಾಗೆಯೇ ಮತ್ತೊಬ್ಬ ಗೆಳೆಯ, “ಕನಸಿನಲ್ಲಿ ಅವನು ತನ್ನ ಪ್ರೇಯಸಿಯ ಜೊತೆಯಲ್ಲಿದ್ದಾಗ ಯಾವುದೋ ಒಂದು ಪುಟ್ಟ ಮಗು ಅವರು ಎಲ್ಲೆಲ್ಲಿ ಹೋಗುತ್ತಾರೋ ಅಲ್ಲೆಲ್ಲ ಬರುತ್ತಿದ್ದು, ಪಕ್ಕದಲ್ಲಿ ಹುಲ್ಲಿನ ಮೆದೆಗೆ ಬೆಂಕಿ ಬಿದ್ದ ಹಾಗೆ, ಅದು ಒಂದು ನೀರು ಇರುವ ಜಾಗಕ್ಕೆ ಹತ್ತಿರವಾಗಿತ್ತೆಂದು ಹೇಳಿದ”. ಅದಕ್ಕೆ ಪ್ರತಿಕ್ರಿಯಿಸಿದ ನಾನು “ಅವನ ಪ್ರೇಮದ ವಿಷಯ ಹುಡುಗಿ ಮನೆಯವರಿಗೆ ಗೊತ್ತಾಗುವ ಭಯವಿದ್ದು, ಹಾಗೆಯೇ ಅವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತವಾಗಿ ಮುರಿದುಬೀಳುವ ಭಯವಿದ್ದಾಗ ಈ ತರಹದ ಕನಸ್ಸುಗಳು ಬರುತ್ತವೆ ಎಂದು ಹೇಳಿದೆ”.

ಕನಸುಗಳನ್ನು ಅರ್ಥ ಮಾಡಿಕೊಳ್ಳುವುದು ಸ್ವಲ್ಪ ಕಷ್ಟದ ಕೆಲಸ. ಇದಕ್ಕೋಸ್ಕರ ಸಿಗ್ಮುಂಡ್ ಫ್ರಾಯ್ಡ್ ಅವರು “ಫ್ರೀ ಅಸೋಸಿಯೇಷನ್” ಎಂಬ ತಂತ್ರವನ್ನು ಕಂಡುಹಿಡಿದರು.

ಒಟ್ಟಿನಲ್ಲಿ ಹೇಳುವುದಾದರೆ ಕನಸುಗಳು ಬೀಳುವುದು ಸಾಮಾನ್ಯವಾಗಿದ್ದು ಅದನ್ನು ಜನರು ಮೂಢನಂಬಿಕೆಯಿಂದ ನೋಡದೆ ವೈಜ್ಞಾನಿಕ ತಳಹದಿಯಲ್ಲಿ ನೋಡಬೇಕು.

(ಖ್ಯಾತ ಮನೋಶಾಸ್ತ್ರಜ್ಞ ಸಿಗ್ಮನ್ಡ್ ಫ್ರಾಯ್ಡ್ ಅವರಿಂದ ಪ್ರೇರಿತನಾಗಿ ಬರೆದಿರುವ ಲೇಖನ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending