ದಿನದ ಸುದ್ದಿ
ವಿಧಾನಪರಿಷತ್ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿ ; ಬಸವರಾಜ ಹೊರಟ್ಟಿ, ಪ್ರಕಾಶ್ ಹುಕ್ಕೇರಿ ಗೆಲುವು
ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇನ್ನೂ ಪ್ರಗತಿಯಲ್ಲಿದೆ.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ದಕ್ಷಿಣ ಪದವೀಧರ ಹಾಗೂ ಬೆಳಗಾವಿಯ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಯವ್ಯ ಪದವೀಧರ ಶಿಕ್ಷಕರು ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ನಿನ್ನೆ ಬೆಳಗ್ಗೆಯಿಂದ ನಡೆಯುತ್ತಿದೆ.
ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದು, ಅವರಿಗೆ ಚುನಾವಣಾಧಿಕಾರಿ ಆಮ್ಲಾ ಅದಿತ್ಯಾ ಬಿಸ್ವಾಸ್ ಪ್ರಮಾಣ ಪತ್ರವನ್ನು ವಿತರಿಸಿದರು.
ಎಂಟನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು ದಾಖಲೆ ನಿರ್ಮಿಸಿರುವ ಮಾಜಿ ವಿಧಾನಪರಿಷತ್ ಸಭಾಪತಿ, ಶಿಕ್ಷಕರ ಸಮಸ್ಯೆಗಳಿಗೆ ಯಾವತ್ತೂ ಧ್ವನಿಯಾಗಿದ್ದು, ಮುಂದೆಯೂ ಶ್ರಮಿಸುವುದಾಗಿ ತಿಳಿಸಿದ್ದಾರೆ.
ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ 4 ಸಾವಿರದ 470 ಮತಗಳಿಂದ ಹಾಲಿ ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ ವಿರುದ್ಧ ಗೆಲುವು ಸಾಧಿಸಿದ್ದಾರೆ. ವಾಯುವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿಜೆಪಿ ಹನುಮಂತ ನಿರಾಣಿ 6 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ದಕ್ಷಿಣ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡ 2601 ಮತಗಳ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿಗೆ ಹಿನ್ನಡೆಯಾಗಿದೆ. ಸಂಜೆ 7 ಗಂಟೆಯ ಹೊತ್ತಿಗೆ ಪೂರ್ಣ ಪ್ರಮಾಣದ ಫಲಿತಾಂಶ ಅಧಿಕೃತವಾಗಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243