ಅಂತರಂಗ

ಕಾರ್ನಾಡರ ಕೊರಳ ಫಲಕ

Published

on

  • ಡಾ. ರಹಮತ್ ತರೀಕೆರೆ

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು.

ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಸಮಾಜವನ್ನು ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕಗಳನ್ನು ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ.

ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ’ ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ.

ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ.

ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯಾದರು.

ಗೌರಿಲಂಕೇಶ್ ಸ್ಮರಣೆಯ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ.

ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು.

ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು.

ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version