ದಿನದ ಸುದ್ದಿ
ದುಡಿಯುವ ವರ್ಗದ ಧೀಮಂತ ನಾಯಕ ಕಾಂII ಹೆಚ್‌ಕೆಆರ್ – ಒಂದು ನೆನಪು
ಈ ನಾಡು ಕಂಡ ಅದ್ಭುತ ಕಾರ್ಮಿಕ ನಾಯಕ ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪ ಅವರು ದಿನಾಂಕ 08-05-2021 ರಂದು ನಿಧನರಾಗಿದ್ದರು. ಇಂದು ಅವರ ಪ್ರಥಮ ಪುಣ್ಯ ಸ್ಮರಣೆ.
ದಾವಣಗೆರೆ ಎಂದರೆ ಕಾರ್ಮಿಕರ ಹೋರಾಟಕ್ಕೆ ಹೆಸರುವಾಸಿಯಾದ ನೆಲ. ಈ ಮಣ್ಣಿನ ಗುಣವೇ ಸಂಘಟನೆ, ಹೋರಾಟ, ಚಳುವಳಿಗಳಿಗೆ ಪ್ರೇರಣೆ ನೀಡುತ್ತದೆ ಅಂತನಿಸುತ್ತದೆ. ಏಕೆಂದರೆ ಕರ್ನಾಟಕದಲ್ಲಿ ಕಾರ್ಮಿಕರ ಹೋರಾಟ ಎಂದೊಡನೆ ತಟ್ಟಂತೆ ನೆನಪಾಗುವುದೇ ದಾವಣಗೆರೆ.
ಕಾರ್ಮಿಕ ಸಂಘಟನೆ ಮಾತ್ರವಲ್ಲದೇ ಭಾರತೀಯ ಕಮ್ಯುನಿಸ್ಟ್ ಪಕ್ಷವನ್ನು ಉಚ್ಛ್ರಾಯ ಸ್ಥಿತಿಗೆ ತಂದಂತಹ ಊರು ಕೂಡಾ ದಾವಣಗೆರೆ. ಇಂತಹ ಕ್ರಾಂತಿಕಾರಿ ಗುಣಗಳನ್ನು ಹೊಂದಿದ್ದಂತಹ ದಾವಣಗೆರೆಯಲ್ಲಿ ದಿವಂಗತ ಕಾಮ್ರೇಡ್ ಪಂಪಾಪತಿಯವರ ಗರಡಿಯಲ್ಲಿ ಬೆಳೆದು ದುಡಿಯುವ ವರ್ಗದ ಧೀಮಂತ ನಾಯಕನಾಗಿ ಬೆಳೆದು ಕಾರ್ಮಿಕರ ಕಷ್ಟ ಸುಖಗಳನ್ನೇ ತನ್ನ ಉಸಿರಾಗಿಸಿಕೊಂಡು ಬೆಳೆದ ಕಾರ್ಮಿಕ ನಾಯಕನೇ ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪ.
ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕನಾಗಿ, ಅಸಂಘಟಿತ ವರ್ಗದ ದುಡಿಯುವ ಜನರ ಹೋರಾಟಗಳಿಗೆ ದೊಡ್ಡ ಶಕ್ತಿಯಾಗಿ ಹಾಗೂ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಮಾರ್ಗದರ್ಶಕರಾಗಿದ್ದ ಕಾಂII ಹೆಚ್.ಕೆ.ರಾಮಚಂದ್ರಪ್ಪ ಅವರು ನಿಧನರಾಗಿ ಒಂದು ವರ್ಷವಾಯಿತು. ಅವರ ನಿಧನ ಕಾರ್ಮಿಕ ವಲಯಕ್ಕೆ ಅದರಲ್ಲೂ ಬಹುಮುಖ್ಯವಾಗಿ ಅಸಂಘಟಿತ ಕಾರ್ಮಿಕ ವಲಯಕ್ಕೆ ಬಹುದೊಡ್ಡ ಆಘಾತವನ್ನು ತಂದೊಡ್ಡಿದೆ.
ಹೆಚ್.ಕೆ.ರಾಮಚಂದ್ರಪ್ಪ ಅವರು ವಿಶೇಷವಾಗಿ ಅಂಗನವಾಡಿ ನೌಕರರು, ಬಿಸಿಯೂಟ ನೌಕರರು, ಆಶಾ ಕಾರ್ಯಕರ್ತರ ಸಂಘಟನೆ ಹಾಗೂ ಇನ್ನೂ ಹಲವಾರು ಕಾರ್ಮಿಕ ಸಂಘಟನೆಗಳಿಗೆ ಧ್ವನಿಯಾಗಿ ತಮ್ಮ ಜೀವನವನ್ನೇ ಕಾರ್ಮಿಕರ ಪರವಾದ ಹೋರಾಟಗಳಿಗೆ ಸಮರ್ಪಿಸಿಕೊಂಡಿದ್ದರು.
ತಮ್ಮ ಮುಂದಿನ ಹೋರಾಟಗಳಿಗೆ ಮುಂದೆ ನಾಯಕ ಯಾರು ಎನ್ನುವ ಪ್ರಶ್ನೆ ದುಡಿಯುವ ವರ್ಗದ ಮುಂದಿದೆ ಎಂದರೂ ತಪ್ಪಾಗಲಾರದು.
ಬಹುಷಃ ಅವರ ಆರು ದಶಕಗಳ ದಣಿವರಿಯದ ಹೋರಾಟದ ಜೀವನದಲ್ಲಿ ಸದಾ ಕಾಲ ಒಡನಾಡಿಯಾಗಿದ್ದ ಕಾಂII ಆನಂದ್ ರಾಜ್ ಅವರ ಮಾರ್ಗದರ್ಶನದಲ್ಲಿ ಕಾಂII ಅವರಗೆರೆ ಉಮೇಶ್ ಹೆಚ್.ಜಿ. ಹಾಗೂ ಕಾಂII ಅವರಗೆರೆ ಚಂದ್ರು ಹಾಗೂ ಮತ್ತಿತರರು ಹೆಚ್‌ಕೆಆರ್ ಅವರು ನಡೆಸಿಕೊಂಡು ಬಂದ ಹೋರಾಟದ ಕ್ರಾಂತಿಕಾರಿ ರಥವನ್ನು ಮುಂದಕ್ಕೆ ಕೊಂಡೊಯ್ಯುವ ಕೆಲಸವನ್ನು ಮಾಡುವ ಮೂಲಕ ಕಾರ್ಮಿಕ ವರ್ಗಕ್ಕೆ ನ್ಯಾಯ ಒದಗಿಸಬೇಕಾಗಿದೆ.
ಸೈದ್ಧಾಂತಿಕವಾಗಿ ಅತ್ಯಂತ ಪ್ರಭಾವಶಾಲಿಯಾಗಿದ್ದ ಹೆಚ್‌ಕೆಆರ್ ಅವರು ವಿಶಾಲ ದೃಷ್ಟಿ ಕೋನವನ್ನು ಹೊಂದಿದ್ದ ನಾಯಕರಾಗಿದ್ದರು. ದುಡಿಯುವ ವರ್ಗದ ಅದರಲ್ಲೂ ಪ್ರಮುಖವಾಗಿ ಅಂಗನವಾಡಿ, ಬಿಸಿಯೂಟ, ಆಶಾ, ಕಟ್ಟಡ ಕಾರ್ಮಿಕರು, ಕೈಗಾರಿಕಾ ವಲಯದ ಕಾರ್ಮಿಕರು, ಆಟೋ ಚಾಲಕರು, ಸಾ ಮಿಲ್ ಕಾರ್ಮಿಕರು, ಪುಟ್‌ಪಾತ್ ವ್ಯಾಪಾರಸ್ಥರು, ಹೋಟೆಲ್ ಕಾರ್ಮಿಕರು, ಮನೆಗೆಲಸದವರು ಹೀಗೆ ಹತ್ತು ಹಲವು ಕಾರ್ಮಿಕ ಸಂಘಟನೆಗಳಿಗೆ ಇವರೇ ಉಸಿರಾಗಿದ್ದರು, ಶಕ್ತಿಯಾಗಿದ್ದರು.
ಸಂಘಟಿತ ವಲಯದ ಬ್ಯಾಂಕ್ ನೌಕರರು, ವಿಮಾ ನೌಕರರು, ರೈಲ್ವೇ ನೌಕರರು, ದೂರಸಂಪರ್ಕ ನಿಗಮದ ನೌಕರರು, ಅಂಚೆ ನೌಕರರು ಮುಂತಾದವರ ಸಂಘಟನೆಗಳಿಗೆ ಮಾರ್ಗದರ್ಶಕರಾಗಿದ್ದರು ಮತ್ತು ಅವರ ಯಾವತ್ತೂ ಹೋರಾಟಗಳಿಗೆ ಸದಾ ಪ್ರೋತ್ಸಾಹ ನೀಡಿ ನೆರವಾಗುತ್ತಿದ್ದರು. ಅಲ್ಲಿನ ಯುವ ನಾಯಕರುಗಳನ್ನು ಸೈದ್ಧಾಂತಿಕವಾಗಿ ಬೆಳೆಸಲು ಮತ್ತು ಎಡಪಂಥೀಯ ವಿಚಾರಧಾರೆಯನ್ನು ಮೈಗೂಡಿಸಿಕೊಂಡು ಪ್ರಬಲ ಹೋರಾಟಗಾರರನ್ನಾಗಿ ರೂಪಿಸಲು ವಿಶೇಷ ಮುತುವರ್ಜಿವಹಿಸುತ್ತಿದ್ದರು.
1943 ರ ಪೆಬ್ರವರಿ 2 ರಂದು ಹರಪನಹಳ್ಳಿ ತಾಲೂಕಿನ ಉಚ್ಛಂಗಿದುರ್ಗದಲ್ಲಿ ಕೆಂಪಣ್ಣ ಮತ್ತು ಕೆಂಪಮ್ಮ ದಂಪತಿಗಳ ಮಗನಾಗಿ ಜನಿಸಿದ ಹೆಚ್‌ಕೆಆರ್ ಅವರು ವಿದ್ಯಾರ್ಥಿದೆಸೆಯಲ್ಲಿಯೇ ಉತ್ತಮ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡಿದ್ದರು. 1960 ರಲ್ಲಿ ದಾವಣಗೆರೆಯ ಚಂದ್ರೋದಯ ಮಿಲ್‌ನಲ್ಲಿ ಕೆಲಸಕ್ಕೆ ಸೇರಿದರು. ಆ ಸಂದರ್ಭದಲ್ಲಿ ಅಲ್ಲಿ ಕಾರ್ಮಿಕರ ಮೇಲೆ ನಡೆಯುತ್ತಿದ್ದ ಶೋಷಣೆ, ದಬ್ಬಾಳಿಕೆ, ದೌರ್ಜನ್ಯವನ್ನು ಪ್ರತಿಭಟಿಸಿದರು.
ಇವರ ಹೋರಾಟದ ಮನೋಭಾವನೆಯನ್ನು ಸೂಕ್ಷ್ಮವಾಗಿ ಗಮನಿಸಿದ ಕಾಂII ಪಂಪಾಪತಿ, ಕಾಂII ಸುರೇಶ್, ಕಾಂIIಶೇಖರಪ್ಪ ಇವರನ್ನು ಕಮ್ಯುನಿಸ್ಟ್ ತೆಕ್ಕೆಗೆ ಸೇರಿಸಿಕೊಂಡರು. ಅಲ್ಲಿಂದ ಅವರ ಹೋರಾಟದ ಜೀವನ ಆರಂಭವಾಯಿತು. ಎಲ್ಲಿ ಕಾರ್ಮಿಕರ ಮೇಲೆ ದಬ್ಬಾಳಿಕೆ ನಡೆಯುತ್ತಿತ್ತೋ ಅಲ್ಲಿ ಹೆಚ್‌ಕೆಆರ್ ಹಾಜರಿರುತ್ತಿದ್ದರು. ವೈಯಕ್ತಿಕ ಬದುಕಿನ ಹಿತಾಸಕ್ತಿಗಳನ್ನು ಕಡೆಗಣಿಸಿ ಕಾರ್ಮಿಕರ ಹಕ್ಕುಗಳಿಗಾಗಿ, ಕಾರ್ಮಿಕರ ನ್ಯಾಯಬದ್ಧವಾದ ಬೇಡಿಕೆಗಳ ಈಡೇರಿಕೆಗಾಗಿ ಕಟಿಬದ್ಧರಾಗಿ ನಿಂತರು. ಚಳುವಳಿ, ಹೋರಾಟ ಇವರ ಜೀವನದ ಅವಿಭಾಜ್ಯ ಅಂಗವಾಯಿತು.
ಎ.ಐ.ಟಿ.ಯು.ಸಿ. ಸಂಘಟನೆಯ ಕೆಂಪು ಬಾವುಟದ ಆಶ್ರಯದಲ್ಲಿ ಅಸಂಘಟಿತ ಕಾರ್ಮಿಕರ, ದುಡಿಯುವ ಮಹಿಳೆಯರ, ರೈತ ಕಾರ್ಮಿಕರ, ವಿದ್ಯಾರ್ಥಿಗಳ, ದುರ್ಬಲವರ್ಗದವರ, ಕೊಳಚೆ ಪ್ರದೇಶಗಳ ನಿವಾಸಿಗಳ ಪರವಾದ ಹೋರಾಟಕ್ಕೆ ಧುಮುಕಿದರು. ಕಾರ್ಲ್ ಮಾರ್ಕ್ಸ್, ಲೆನಿನ್ ಅವರುಗಳ ತತ್ವ ಸಿದ್ಧಾಂತ ಮೂಲಕ ತಮ್ಮ ಮನಸ್ಸನ್ನು ಹದಗೊಳಿಸಿಕೊಂಡರು. ಶೋಷಣೆರಹಿತ ಸಮ ಸಮಾಜದ ನಿರ್ಮಾಣದ ಕನಸು ಕಂಡರು. ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಅಸಂಘಟಿತ ಕಾರ್ಮಿಕರನ್ನು ಸಂಘಟಿಸಿದರು.
ಈ ಹೋರಾಟದ ಹಾದಿಯಲ್ಲಿ ಅನೇಕ ನೋವು, ಸಂಕಷ್ಟ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಬಂಡವಾಳಷಾಹಿ ವ್ಯವಸ್ಥೆಯ ಕೆಂಗಣ್ಣಿಗೆ ಗುರಿಯಾಗಿ ಜೈಲುವಾಸವನ್ನೂ ಅನುಭವಿಸಬೇಕಾಯಿತು. ಅವರ ಕುಟುಂಬವರ್ಗ ಇನ್ನಿಲ್ಲದ ಕಷ್ಟಕ್ಕೆ ತುತ್ತಾಗಬೇಕಾಯಿತು. ಆದರೂ ಅವರು ಎದೆಗುಂದದೇ ಹೋರಾಟದ ಹಾದಿಯಲ್ಲಿ ಮುಂದುವರೆದರು. ಪಂಪಾಪತಿಯವರು 1978, 1983, 1985 ರಲ್ಲಿ ದಾವಣಗೆರೆ ಶಾಸಕರಾಗಿ ಆಯ್ಕೆಯಾಗುವಲ್ಲಿ ಹೆಚ್‌ಕೆಆರ್ ಶ್ರಮ ಬಹಳಷ್ಟಿತ್ತು.
ಪಂಪಾಪತಿಯವರ ಜೊತೆ ಜೊತೆಗೆ ರಾಜಕೀಯವಾಗಿ ಇವರೂ ಬೆಳೆದರು. 1974 ರಿಂದ ಸತತವಾಗಿ 21 ವರ್ಷಗಳ ಕಾಲ ದಾವಣಗೆರೆ ನಗರಸಭಾ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಅನೇಕ ಜನಪರವಾದ ಆಡಳಿತವನ್ನು ನೀಡಿದರು. ಕಮ್ಯುನಿಸ್ಟ್ ಆಡಳಿತದ ವೈಭವವನ್ನು ದಾವಣಗೆರೆಯ ಹಳೆತಲೆಮಾರಿನ ಜನರು ಈಗಲೂ ಹೆಮ್ಮೆಯಿಂದ ನೆನೆಯುತ್ತಾರೆ. ಮೇ 1 ವಿಶ್ವ ಕಾರ್ಮಿಕ ದಿನಾಚರಣೆ ಬಂತೆಂದರೆ ದಾವಣಗೆರೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗುತ್ತಿತ್ತು. ಹತ್ತಾರು ಸಾವಿರ ಕಾರ್ಮಿಕರ ಮೆರವಣಿಗೆ, ಮುಗಿಲು ಮುಟ್ಟುವಂತಹ ಕಾರ್ಮಿಕರ ಘೋಷಣೆಗಳು ಕಾರ್ಮಿಕರ ದಿನಾಚರಣೆಗೆ ಕೆಳೆಕಟ್ಟುವಂತಿತ್ತು.
ಅದೇ ಮೇ ತಿಂಗಳಿನಲ್ಲಿಯೇ ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪ ಅವರು ಅಸ್ತಂಗತರಾಗಿದ್ದು ಕಾಕತಾಳೀಯವೇ ಸರಿ. ಕಮ್ಯುನಿಸ್ಟ್ ಸಿದ್ಧಾಂತ ಮತ್ತು ಕಾರ್ಮಿಕರ ಪರವಾದ ಹೋರಾಟದ ಮನೋಭಾವವನ್ನು ಅವರು ತಮ್ಮ ಉಸಿರಿರುವವರೆಗೂ ಬಿಡಲಿಲ್ಲ. ಇವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಅನೇಕ ರಾಜಕೀಯ ಪಕ್ಷಗಳು ಇವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸಿದ್ದರು. ಇವರ ಕಣ್ಣೆದುರೇ ಅನೇಕ ಕಮ್ಯುನಿಸ್ಟ್ ನಾಯಕರುಗಳು ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಬೇರೆ ಬೇರೆ ರಾಜಕೀಯ ಪಕ್ಷಗಳಿಗೆ ಸೇರಿದರು.
ಒಂದು ವೇಳೆ ಇವರು ಕೂಡಾ ಬೇರೆ ಯಾವುದಾದರೂ ಪ್ರಬಲ ರಾಜಕೀಯ ಪಕ್ಷಕ್ಕೆ ಸೇರಿದ್ದೇ ಹೌದಾಗಿದ್ದರೆ ಖಂಡಿತವಾಗಿಯೂ ಸಂಸದರಾಗಿಯೋ ಶಾಸಕರಾಗಿಯೋ ಆಯ್ಕೆಗೊಳ್ಳುವುದು ಶತಸಿದ್ಧವಾಗಿತ್ತು ಎಂದು ಅವರ ಸಮಕಾಲೀನ ಮಿತ್ರರೇ ಹೇಳುತ್ತಾರೆ. ಆದರೆ ಹೆಚ್‌ಕೆಆರ್ ಅವರು ಕಲ್ಲುಬಂಡೆಯಂತೆ ಕಮ್ಯುನಿಸ್ಟ್ ಪಕ್ಷದ ಜೊತೆ ನಿಂತರು. ತತ್ವ, ಸಿದ್ಧಾಂತಗಳಿಗೆ ಕಟಿಬದ್ಧರಾಗಿದ್ದ ಹೆಚ್‌ಕೆಆರ್ ಅವರು ತಮ್ಮ ಕಮ್ಯುನಿಸ್ಟ್ ನಿಲುವನ್ನು ಯಾವುದೇ ಕಾರಣಕ್ಕೂ ಬದಲಾಯಿಸಲಿಲ್ಲ ಎನ್ನುವುದು ಸೂರ್ಯನಷ್ಟೇ ಸತ್ಯ.
ಇವರ ಹೋರಾಟದ ಜೀವನವನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಇವರನ್ನು ಗೌರವಿಸಿ, ಅಭಿನಂದಿಸಿ, ಸನ್ಮಾನಿಸಿ ಪ್ರಶಸ್ತಿಗಳನ್ನು ನೀಡಿವೆ. ಅದರಲ್ಲಿ ಮುಖ್ಯವಾಗಿ ಚಿತ್ರದುರ್ಗದ ಶ್ರೀ ಮುರುಘಾ ಮಠವು ಪ್ರತೀ ವರ್ಷ ಕೊಡಮಾಡುವ ಪ್ರತಿಷ್ಠಿತ “ಶೂನ್ಯ ಪೀಠ ಚನ್ನಬಸವ ಪ್ರಶಸ್ತಿಯನ್ನು 2015 ರಲ್ಲಿ ಕೊಡಲಾಗಿತ್ತು. ಪ್ರಶಸ್ತಿಯು ರೂ.25000/- ನಗದು ಹಣವನ್ನೂ ಹೊಂದಿತ್ತು. ಹೆಚ್‌ಕೆಆರ್ ಅವರು ಆ ಪ್ರಶಸ್ತಿಯ ನಗದು ಹಣವನ್ನು ಪ್ರಶಸ್ತಿ ಪ್ರದಾನ ವೇದಿಕೆಯಲ್ಲಿಯೇ ಶ್ರೀ ಮಠದ ಸಮಾಜಮುಖಿ ಕಾರ್ಯಗಳಿಗೆ ದೇಣಿಗೆಯಾಗಿ ನೀಡಿದ್ದು ಅವರ ಔದಾರ್ಯತೆಯನ್ನು ತೋರಿಸುತ್ತದೆ ಮತ್ತು ಸೇರಿದ್ದ ಸಾವಿರಾರು ಜನರ ಮೆಚ್ಚುಗೆಗೆ ಪಾತ್ರವಾಗಿತ್ತು.
ಇನ್ನು ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪನವರನ್ನು ರಾಜ್ಯಾದ್ಯಂತ ಎಲ್ಲರೂ ಪಕ್ಷಾತೀತವಾಗಿ ಗೌರವಿಸುತ್ತಿದ್ದರು. ಯಾವುದೇ ಸರಕಾರಿ ಕಛೇರಿಗಳಿಗೆ ಇವರು ಭೇಟಿ ನೀಡಿದಾಗ ಅಧಿಕಾರಿಗಳು ಎದ್ದು ನಿಂತು ಇವರಿಗೆ ಗೌರವ ಕೊಡುತ್ತಿದ್ದರು. 2015ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ದಾವಣಗೆರೆಗೆ ಬರುವ ಕಾರ್ಯಕ್ರಮವಿತ್ತು. ಐಟಿಐ ಕಾಲೇಜಿನಲ್ಲಿ ಹೆಲಿಕಾಪ್ಟರ್ ಬಂದಿಳಿಯಿತು.
ಸಹಜವಾಗಿಯೇ ಸಾವಿರಾರು ಅಭಿಮಾನಿಗಳು, ರಾಜಕೀಯ ಧುರೀಣರು ನೆರೆದಿದ್ದರು. ಹೆಚ್‌ಕೆಆರ್ ನೇತೃತ್ವದಲ್ಲಿ ಒಂದಿಷ್ಟು ಕಾರ್ಮಿಕರು ಕೂಡಾ ತಮ್ಮ ಮನವಿಯನ್ನು ಸಲ್ಲಿಸಲು ಕಾಯುತ್ತಿದ್ದರು. ಸಿದ್ದರಾಮಯ್ಯನವರು ಹೆಲಿಕಾಪ್ಟರ್ ಇಳಿದು ಎಲ್ಲರ ಕಡೆಗೆ ಒಮ್ಮೆ ದೃಷ್ಟಿಹಾಯಿಸಿದರು. ಸೀದಾ ಅವರು ಬಂದಿದ್ದು ಹೆಚ್‌ಕೆಆರ್ ಬಳಿಗೆ. ಎನ್ರೀ ರಾಮಚಂದ್ರಪ್ಪ ಅವರೇ ಚೆನ್ನಾಗಿದ್ದೀರಾ ಎಂದು ಹೆಗಲ ಮೇಲೆ ಕೈ ಹಾಕಿ ಆತ್ಮೀಯವಾಗಿ ಮಾತನಾಡಿಸಿ ಮನವಿಪತ್ರವನ್ನು ತೆಗೆದುಕೊಂಡರು. ಹೆಚ್‌ಕೆಆರ್ ಅವರು ಅಂಗನವಾಡಿ ಕಾರ್ಯಕರ್ತದ ಗೌರವಧನವನ್ನು ಹೆಚ್ಚಿಸುವಂತೆ ಮನವಿ ಮಾಡಿದರು.
ಅದರಂತೆಯೇ ಸಿದ್ದರಾಮಯ್ಯನವರು ಮುಂದಿನ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತರ ಗೌರವಧನವನ್ನು ಹೆಚ್ಚಿಸಿದ್ದರು. ಹೀಗೆ ಅಜಾತಶತ್ರುವಿನಂತೆ ಎಲ್ಲರ ಗೌರವಕ್ಕೆ ಪಾತ್ರರಾದ ಧೀಮಂತ ವ್ಯಕ್ತಿತ್ವ ಅವರದಾಗಿತ್ತು. ಅವರು ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನ ಪಡೆಯಲು ಅವರ ಬಂಧು ಬಾಂಧವರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕ ಬಂಧುಗಳು ಕೊರೋನಾ ಭಯವನ್ನು ಲೆಕ್ಕಿಸದೇ ಧಾವಿಸಿದ್ದು ಅವರ ಜನಪ್ರಿಯತೆಯನ್ನು ಸಾರಿ ಸಾರಿ ಹೇಳುತಿತ್ತು. ಅಂಗನವಾಡಿ ಹಾಗೂ ಬಿಸಿಯೂಟ ಸಂಘಟನೆಗಳ ಮಹಿಳಾ ಕಾರ್ಮಿಕರಂತೂ ತಮ್ಮ ಸ್ವಂತ ಸಹೋದರನನ್ನೋ ತಂದೆಯನ್ನೋ ಕಳೆದುಕೊಂಡಂತೆ ಬಿಕ್ಕಿ ಬಿಕ್ಕಿ ಅಳುತಿದ್ದುದು ಮನಕಲುಕುವಂತಿತ್ತು.
ಹೆಚ್‌ಕೆಆರ್ ಅವರ ಉಸಿರು ನಿಂತಿರಬಹುದು. ಆದರೆ ಅವರ ಹೆಸರು ಲಕ್ಷಾಂತರ ಕಾರ್ಮಿಕರ ಮನದಲ್ಲಿ ಹಚ್ಚಹಸಿರಾಗಿ ಮುಂದಿನ ಹೋರಾಟಗಳಿಗೆ ಸ್ಪೂರ್ತಿಯಾಗಿರುವುದರಲ್ಲಿ ಯಾವುದೇ ಸಂದೇಹವಿಲ್ಲ.
ಕಾಮ್ರೇಡ್ ಹೆಚ್.ಕೆ.ಆರ್. ಗೆ ಗೌರವ ಡಾಕ್ಟರೇಟ್ ನೀಡಲಿ
- ಕಾಂ.ಹೆಚ್.ಕೆ.ಆರ್. ಶ್ರಮಿಕ ವರ್ಗದ ಬಹುದೊಡ್ಡ ಹೋರಾಟಗಾರನಾಗಿ, ಅದರಲ್ಲೂ ವಿಶೇಷವಾಗಿ ಅಸಂಘಟಿತ ವಲಯದ ಕಾರ್ಮಿಕರಾದ ಅಂಗನವಾಡಿ, ಬಿಸಿಯೂಟ, ಆಶಾ ಹಾಗೂ ಕಟ್ಟಡ ಕಾರ್ಮಿಕರ ಪರವಾಗಿ ಹಾಗೂ ಸಮಾಜದಲ್ಲಿನ ಶೋಷಿತರು, ದಮನಿತರು, ದೀನ-ದಲಿತರು, ವಿದ್ಯಾರ್ಥಿಗಳ ಸಮುದಾಯ, ಮಹಿಳೆಯರ ಪರವಾಗಿ ಸುದೀರ್ಘವಾದ ಆರು ದಶಕಗಳ ಕಾಲ ಹೋರಾಟ ಮಾಡಿ ಆ ವರ್ಗಕ್ಕೆ ಅನೇಕ ಸೌಲಭ್ಯಗಳನ್ನು ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಅವರ ಹೋರಾಟ ಅನನ್ಯವಾದುದು. ಕಾರ್ಮಿಕ ವರ್ಗದ ಪರವಾದ ಅವರ ಹೋರಾಟವನ್ನು ಪರಿಗಣಿಸಿ ದಾವಣಗೆರೆ ವಿಶ್ವವಿದ್ಯಾಲಯ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಬೇಕು.
| ಕೆ.ರಾಘವೇಂದ್ರ ನಾಯರಿ, ಎಐಟಿಯುಸಿ ಜಿಲ್ಲಾಧ್ಯಕ್ಷ
ಕಾಂII ಹೆಚ್‌ಕೆಆರ್ ಚಿರಾಯುವಾಗಲಿ...
ಕಾಂII ಹೆಚ್‌ಕೆಆರ್ ಅಮರ ರಹೇ…
(ಲೇಖಕರು: ಕೆ.ರಾಘವೇಂದ್ರ ನಾಯರಿ,
ಕಾರ್ಮಿಕ ಮುಖಂಡ ಹಾಗೂ
AITUC ದಾವಣಗೆರೆ ಜಿಲ್ಲಾಧ್ಯಕ್ಷರು
ಮೊ: 9844314543
mail id : krnairycbeu@gmail.com)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್‌ನ ‘ಯೂನಿವರ್ಸಿಟಿ ಆಫ್ ಸ್ಯಾಲ್‌ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್‌ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.
ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.
ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.
ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
-
ದಿನದ ಸುದ್ದಿ3 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ1 day agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ1 hour agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

