Connect with us

ಬಹಿರಂಗ

‘ಭಾರತ ಸಂವಿಧಾನ’ದ ಬಗ್ಗೆ ನೀವಿಷ್ಟು ತಿಳಿಯಲೇ ಬೇಕು : ಮಿಸ್ ಮಾಡ್ದೆ ಓದಿ

Published

on

ಭಾರತ‌ ಸಂವಿಧಾನದ ಬಗ್ಗೆ ತಿಳಿದುಕೊಳ್ಳುವುದು ಇಂದಿನ ತುರ್ತು. ಈ ಹಿನ್ನಲೆಯಲ್ಲಿ ನಮ್ಮ‌ ಹೆಮ್ಮೆಯ ಸಂವಿಧಾನದ ಬಗ್ಗೆ ಒಂದಷ್ಟು ಮಾಹಿತಿ ನಿಮಗಾಗಿ.

ಭಾರತ ಸಂವಿಧಾನದ ಲಕ್ಷಣಗಳು

1. ಬೃಹತ್ ಸಂವಿಧಾನ

ಇದು ವಿಶ್ವದಲ್ಲಿಯೇ ಬೃಹತ್ ಸಂವಿಧಾನವಾಗಿದೆ. ಮೂಲ ಸಂವಿಧಾನವು ಒಟ್ಟು 395 ವಿಧಿಗಳು, 8 ಅನುಸೂಚಿಗಳು ಮತ್ತು 8 ಭಾಗಗಳನ್ನು ಒಳಗೊಂಡಿತ್ತು. ಆದರೆ ಪ್ರಸ್ತುತ ಸಂವಿಧಾನವು ಒಟ್ಟು 465ವಿಧಿಗಳು, 12 ಅನುಸೂಚಿಗಳು ಮತ್ತು 100 ತಿದ್ದುಪಡಿಗಳನ್ನು ಒಳಗೊಂಡಿದೆ.

ಬೃಹತ್ ಸಂವಿಧಾನಕ್ಕೆ ಕಾರಣಗಳೆಂದರೆ

  • ಭೌಗೋಳಿಕ ವಿಸ್ತೀರ್ಣತೆ.
  • ಐತಿಹಾಸಿಕ ಅಂಶಗಳು (1935ರ ಭಾರತ ಸರ್ಕಾರದ ಕಾಯ್ದೆಯ ಪ್ರಕಾರ).
  • ಜಮ್ಮು ಮತ್ತು ಕಾಶ್ಮೀರವನ್ನು ಹೊರತುಪಡಿಸಿ ಇಡೀ ಭಾರತಕ್ಕೆ ಒಂದೇ ಸಂವಿಧಾನ.
  • ನಮ್ಯ ಮತ್ತು ಅನಮ್ಯ ಸ್ವರೂಪದ ಲಕ್ಷಣಗಳು.
  • ನಮ್ಮ ಸಂವಿಧಾನಕ್ಕೆ ಇದುವರೆಗೆ ತರಲಾದ ತಿದ್ದುಪಡಿಗಳ ಮೂಲಕ ಕೆಲವು ಹೊಸ ಅಧ್ಯಾಯ ಹಾಗೂ ವಿಧಿಗಳನ್ನು ಸೇರಿಸಲಾಗಿದೆ.
  • ನಮ್ಮ ಸಂವಿಧಾನವು ಕೇಂದ್ರಾಡಳಿತ ಪ್ರದೇಶಗಳ ಬಗ್ಗೆ ವಿವರಣೆಗಳನ್ನು ಹೊಂದಿದೆ.

2. ಲಿಖಿತ ಸಂವಿಧಾನ

ಅಮೆರಿಕಾ ಸಂವಿಧಾನದಂತೆ ಭಾರತದ ಸಂವಿಧಾನವು ಲಿಖಿತ ಸಂವಿಧಾನವಾಗಿದ್ದು, ಬ್ರಿಟನ್ ಸಂವಿಧಾನದಂತೆ ಅಲಿಖಿತ ಸಂವಿಧಾನವಾಗಿರುವುದಿಲ್ಲ. ಸರ್ಕಾರದ ಅಂಗಗಳಾದ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ರಚನೆ, ಅಧಿಕಾರ ಮತ್ತು ಕಾರ್ಯವ್ಯಾಪ್ತಿ, ಮೂಲಭೂತ ಹಕ್ಕು ಮತ್ತು ಕರ್ತವ್ಯಗಳಿಗೆ ಸಂಬಂಧಿಸಿದ ವಿವರಗಳು ಬರವಣಿಗೆಯ ರೂಪದಲ್ಲಿರುವುದನ್ನು ನಾವು ಕಾಣಬಹುದು.

3. ಮೂಲಭೂತ ಹಕ್ಕುಗಳು

ಮೂಲಭೂತ ಹಕ್ಕುಗಳು ವ್ಯಕ್ತಿತ್ವ ವಿಕಸನದ ಅವಿಭಾಜ್ಯ ಅಂಗಗಳಾಗಿವೆ. ಭಾರತದ ಸಂವಿಧಾನದ ಮೂರನೆಯ ಭಾಗವು ತನ್ನ ಪ್ರಜೆಗಳಿಗೆ ಸ್ವಾತಂತ್ರ್ಯದ ಹಕ್ಕು, ಸಮಾನತೆಯ ಹಕ್ಕು, ಶೋಷಣೆಯ ವಿರುದ್ಧದ ಹಕ್ಕು, ಶೈಕ್ಷಣಿಕ ಹಾಗೂ ಸಾಂಸ್ಕøತಿಕ ಹಕ್ಕು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಮತ್ತು ಸಂವಿಧಾನಾತ್ಮಕ ಪರಿಹಾರಗಳ ಹಕ್ಕು ಹೀಗೆ ಆರು ಮೂಲಭೂತ ಹಕ್ಕುಗಳನ್ನು ನೀಡಿದೆ. ಸಂವಿಧಾನದ ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ನೀಡಿದೆ, ಆದ್ದರಿಂದ ಸರ್ವೋಚ್ಛ ನ್ಯಾಯಾಲಯವನ್ನು “ಭಾರತ ಸಂವಿಧಾನದ ರಕ್ಷಕ/ಕಾವಲುಗಾರ” ಎಂದು ಕರೆಯಲಾಗುತ್ತದೆ.

4. ಮೂಲಭೂತ ಕರ್ತವ್ಯಗಳು

ಮೂಲಭೂತ ಕರ್ತವ್ಯಗಳನ್ನು ನಾವು ಭಾರತ ಸಂವಿಧಾನಕ್ಕೆ ಸೋವಿಯತ್ (ರಷ್ಯಾ) ಸಂವಿಧಾನದಿಂದ ಎರವಲು ಪಡೆದಿದ್ದೇವೆ. 1976ರ 42ನೇ ತಿದ್ದುಪಡಿಯ ಮೂಲಕ ಭಾರತ ಸಂವಿಧಾನಕ್ಕೆ ಮೂಲಭೂತ ಕರ್ತವ್ಯಗಳ ಪಟ್ಟಿಯನ್ನು ಸೇರಿಸಲಾಯಿತು. ಭಾರತ ಸಂವಿಧಾನದಲ್ಲಿ 4-ಎ ಭಾಗದಲ್ಲಿನ 51(ಎ) ವಿಧಿಯಡಿಯಲ್ಲಿ ಹನ್ನೊಂದು ಮೂಲಭೂತ ಕರ್ತವ್ಯಗಳನ್ನು ಕಾಣಬಹುದು.

ಅವುಗಳು ಈ ಕೆಳಗಿನಂತಿವೆ

1.ಸಂವಿಧಾನ, ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜವನ್ನು ಗೌರವಿಸುವುದು.

2.ಸ್ವಾತಂತ್ರ್ಯ ಚಳುವಳಿಯ ಉದಾತ್ತ ಆದರ್ಶಗಳನ್ನು ಪಾಲಿಸುವುದು.

3. ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯುವುದು ಮತ್ತು ಕಾಪಾಡುವುದು.

4. ಕರೆ ಬಂದಾಗ ರಾಷ್ಟ್ರವನ್ನು ರಕ್ಷಿಸುವುದು ಮತ್ತು ದೇಶ ಸೇವೆ ಮಾಡುವುದು.

5. 6 ರಿಂದ 14 ವರ್ಷದೊಳಗಿನ ಮಕ್ಕಳನ್ನು ಪಾಲಕರು ಕಡ್ಡಾಯವಾಗಿ ಶಾಲೆಗೆ ಕಳುಹಿಸತಕ್ಕದ್ದು.

6. ನಮ್ಮ ಸಮ್ಮಿಶ್ರ ಸಂಸ್ಕøತಿಯ ಶ್ರೀಮಂತ ಪರಂಪರೆಯನ್ನು ಗೌರವಿಸುವುದು ಮತ್ತು ರಕ್ಷಿಸುವುದು.

7. ವೈಯಕ್ತಿಕ ಹಾಗೂ ಸಾಮೂಹಿಕ ಚಟುವಟಿಕೆಗಳಲ್ಲಿ ಪ್ರಾವಿಣ್ಯತೆಯನ್ನು ಪ್ರದರ್ಶಿಸಿ ರಾಷ್ಟ್ರದ ಪ್ರಗತಿಗೆ ಶ್ರಮಿಸುವುದು.

8. ಮಹಿಳೆಯರ ಗೌರವಕ್ಕೆ ಚ್ಯುತಿಯುಂಟುಮಾಡುವ ಆಚರಣೆಗಳನ್ನು ತ್ಯಜಿಸುವುದು ಮತ್ತು ಭಾರತೀಯರಲ್ಲಿ ಭ್ರಾತೃತ್ವ ಮತ್ತು ಸಾಮರಸ್ಯ ಭಾವನೆಗಳನ್ನು ಬೆಳೆಸುವುದು.

9. ಅರಣ್ಯಗಳು, ಸರೋವರಗಳು, ನದಿಗಳು ಮತ್ತು ವನ್ಯಜೀವಿಗಳನ್ನು ಒಳಗೊಂಡ ನೈಸರ್ಗಿಕ ಪರಿಸರವನ್ನು ರಕ್ಷಿಸಿ, ಅಭಿವೃದ್ಧಿಪಡಿಸುವುದು.

10. ವೈಜ್ಞಾನಿಕ ಹಾಗೂ ಮಾನವೀಯ ಗುಣಗಳನ್ನು ಮತ್ತು ವಿಚಾರಣಾ ಹಾಗೂ ಸುಧಾರಣಾ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು.

11. ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವುದು ಮತ್ತು ಹಿಂಸೆ ತ್ಯಜಿಸುವುದು.

5. ರಾಜ್ಯ ನೀತಿ ನಿರ್ದೇಶಕ ತತ್ವಗಳು

ಭಾರತ ಸಂವಿಧಾನಕ್ಕೆ ರಾಜ್ಯ ನೀತಿ ನಿರ್ದೇಶಕ ತತ್ವಗಳನ್ನು ಐರ್ಲೆಂಡ್ ಸಂವಿಧಾನದಿಂದ ಎರವಲು ಪಡೆಯಲಾಗಿದೆ, ಭಾರತ ಸಂವಿಧಾನದ ನಾಲ್ಕನೇ ಭಾಗವು ರಾಜ್ಯನೀತಿ ನಿರ್ದೇಶಕ ತತ್ವಗಳನ್ನು ಒಳಗೊಂಡಿದೆ. ಕಾನೂನುಗಳನ್ನು ರೂಪಿಸುವಾಗ, ನೀತಿಗಳನ್ನು ಹಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಾಗ ಮತ್ತು ಆಡಳಿತ ನಡೆಸುವಾಗ ರಾಜ್ಯ ನೀತಿ ನಿರ್ದೇಶಕ ತತ್ವಗಳನ್ನು ಅಳವಡಿಸಿಕೊಳ್ಲುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದ್ಯ ಕರ್ತವ್ಯವಾಗಿದೆ.

6. ಎರವಲು ಸಂವಿಧಾನ

ನಮ್ಮ ಸಂವಿಧಾನವು ವಿಶ್ವದ ವಿವಿಧ ಸಂವಿಧಾನಗಳಿಂದ ಅನೇಕ ಲಕ್ಷಣಗಳನ್ನು ಎರವಲು ಪಡೆದಿದೆ, ಆದ್ದರಿಂದ ಇದನ್ನು ಎರವಲು ಸಂವಿಧಾನ ಎಂದು ಕರೆಯುತ್ತಾರೆ. ಉದಾಹರಣೆಗೆ ಮೂಲಭೂತ ಹಕ್ಕುಗಳ ಪಟ್ಟಿ, ನ್ಯಾಯಿಕ ವಿಮರ್ಶೆ, ಪ್ರಸ್ತಾವನೆಗಳನ್ನು ಅಮೆರಿಕಾ ಸಂಯುಕ್ತ ಸಂಸ್ಥಾನದ ಸಂವಿಧಾನದಿಂದಲೂ, ಕಾನೂನಿನ ಆಳ್ವತೆ, ಏಕ ಪೌರತ್ವ, ಸಂಸದೀಯ ಪದ್ದತಿಗಳನ್ನು ಗ್ರೇಲಿತ್ ಬ್ರಿಟನ್ ಸಂವಿಧಾನದಿಂದ ಎರವಲು ಪಡೆಯಲಾಗಿದೆ.

7. ಸಂಸದೀಯ ಸರ್ಕಾರ ಪದ್ದತಿ

ಬ್ರಿಟಿಷ ಸಂವಿಧಾನದಿಂದ ನಾವು ಸಂಸದೀಯ ಸರ್ಕಾರ ಪದ್ದತಿಯನ್ನು ಭಾರತೀಯ ಸಂವಿಧಾನಕ್ಕೆ ಎರವಲಾಗಿ ಪಡೆದಿದ್ದೇವೆ. ಭಾರತ ಸಂವಿಧಾನವು ಕೇಂದ್ರ ಹಾಗೂ ರಾಜ್ಯಗಳಲ್ಲಿ ಸಂಸದೀಯ ಪದ್ದತಿಗೆ ಅವಕಾಶ ಮಾಡಿಕೊಟ್ಟಿದೆ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಕಾರ್ಯಾಂಗವು ಶಾಸಕಾಂಗಕ್ಕೆ ಹೊಣೆಯಾಗಿರುತ್ತದೆ. ಕಾರ್ಯಾಂಗವು ಶಾಸಕಾಂಗದ ವಿಶ್ವಾಸವನ್ನು ಹೊಂದಿರುವವರಿಗೆ ಮಾತ್ರ ಅಧಿಕಾರದಲ್ಲಿ ಮುಂದುವರೆಯುತ್ತದೆ. ಶಾಸಕಾಂಗದ ವಿಶ್ವಾಸವನ್ನು ಕಳೆದುಕೊಂಡ ತಕ್ಷಣ ಅಧಿಕಾರವನ್ನು ಕಳೆದುಕೊಳ್ಳುತ್ತದೆ.

8. ಸಾರ್ವತ್ರಿಕ ವಯಸ್ಕ ಮತದಾನ ಪದ್ದತಿ

ಈ ಪದ್ದತಿಯ ಪ್ರಕಾರ, ಜಾತಿ, ಮತ, ಲಿಂಗ, ಸಾಮಾಜಿಕ ಸ್ಥಾನಮಾನ, ಮುಂತಾದವುಗಳ ಆಧಾರದ ಮೇಲೆ ಯಾವುದೇ ತಾರತಮ್ಯವಿಲ್ಲದೇ 18 ವರ್ಷ ಮೇಲ್ಪಟ್ಟ ಎಲ್ಲ ಪ್ರಜೆಗಳಿಗೆ ಮತದಾನದ ಹಕ್ಕನ್ನು ನೀಡಲಾಗಿದೆ. 1989ರ 61ನೇಯ ತಿದ್ದುಪಡಿಯ ಪ್ರಕಾರ ಮತದಾನದ ವಯಸ್ಸನ್ನು 21 ರಿಂದ 18ಕ್ಕೆ ಇಳಿಸಲಾಯಿತು. ಇದು ಪ್ರಜಾಪ್ರಭುತ್ವವನ್ನು ಬಲಗೊಳಿಸುವಲ್ಲಿ ಕ್ರಾಂತಿಕಾರಿಕ ಹೆಜ್ಜೆಯಾಗಿದೆ. ಸಾರ್ವತ್ರಿಕ ವಯಸ್ಕ ಮತದಾನ ಪದ್ದತಿಯ ಫಲವಾಗಿ ಭಾರತವು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಿದೆ.

9. ನ್ಯಾಯಿಕ ವಿಮರ್ಶೆ

ನ್ಯಾಯಿಕ ವಿಮರ್ಶೆಯಲ್ಲಿ ಭಾರತ ಸಂವಿಧಾನದ ಪ್ರಮುಖ ಲಕ್ಷಣಗಳಲ್ಲೊಂದಾಗಿದೆ. ನ್ಯಾಯಾಂಗವು ಶಾಸಕಾಂಗ ಮತ್ತು ಕಾರ್ಯಂಗಗಳ ಅಧಿಕಾರ ಹಾಗೂ ಕಾರ್ಯಗಳ ಸಂವಿಧಾನ ಬದ್ದತೆಯನ್ನು ವಿಮರ್ಶಿಸುವ ಅಧಿಕಾರವನ್ನು ಹೊಂದಿದೆ. ಸಂವಿಧಾನವನ್ನು ಉಲ್ಲಂಘಿಸುವ ಶಾಸಕಾಂಗದ ಕಾನೂನುಗಳನ್ನು ನ್ಯಾಯಾಂಗವು ಸಂವಿಧಾನ ಬಾಹಿರ ಬಾಹಿರ, ಅಸಿಂಧು ಎಂದು ಘೋಷಿಸುತ್ತದೆ. ನ್ಯಾಯಾಂಗ ವ್ಯವಸ್ಥೆಯು ಸ್ವತಂತ್ರವಾಗಿರಲು ಕಾರಣಗಳು.

ನೇಮಕಾತಿ ವಿಧಾನ

• ನಿವೃತ್ತಿಯ ನಂತರ ವಕೀಲ ವೃತ್ತಿಯಿಂದ ನಿಷೇಧ.

• ವೇತನ ಮತ್ತು ಭತ್ಯೆಗಳನ್ನು ದೇಶದ ಸಂಚಿತ ನಿಧಿಯಿಂದ ಭರಿಸಲಾಗುತ್ತದೆ.

• ನ್ಯಾಯಾಧೀಶರ ವರ್ತನೆಗಳನ್ನು ಸಂಸತ್ತಿನ ಒಳಗೆ ಮತ್ತು ಹೊರಗೆ ಚರ್ಚಿಸುವಂತಿಲ್ಲ.

10. ಏಕಪೌರತ್ವ

ಭಾರತ ಸಂವಿಧಾನಕ್ಕೆ ಏಕಪೌರತ್ವವನ್ನು ಬ್ರಿಟಿಷ್ ಸಂವಿಧಾನದಿಂದ ಎರವಲು ಪಡೆಯಲಾಗಿದೆ. ಭಾರತದಲ್ಲಿ ಒಬ್ಬ ವ್ಯಕ್ತಿ ರಾಷ್ಟ್ರೀಯ ಪೌರತ್ವವನ್ನು ಹೊಂದಿದ್ದಾನೆಯೇ ಹೊರತು ರಾಜ್ಯದ ಪೌರತ್ವವನ್ನು ಹೊಂದಿರುವುದಿಲ್ಲ. ಭಾರತೀಯರಲ್ಲಿ ಏಕತೆ, ಸಮಗ್ರತೆ ಮತ್ತು ಅವಿಭಜಿತ ನಿಷ್ಠೆ ಮುಂತಾದ ಉದಾತ್ತ ಮನೋಭಾವನೆಗಳನ್ನು ಬೆಳೆಸಲು ಏಕಪೌರತ್ವ ಪದ್ದತಿಯು ಪೂರಕವಾಗಿದೆ.

11. ಪ್ರಜಾಪ್ರಭುತ್ವ

ಭಾರತವು ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತ ದೇಶದಲ್ಲಿ ಸಾರ್ವತ್ರಿಕ, ವಯಸ್ಕ ಮತದಾನ ಪದ್ದತಿ ಮೂಲಕ ಚುನಾಯಿತರಾದ ಜನಪ್ರತಿನಿಧಿಗಳು ಪ್ರಜೆಗಳ ಪರವಾಗಿ ರಾಜ್ಯಾಡಳಿತದಲ್ಲಿ ಭಾಗವಹಿಸುತ್ತಾರೆ (326ನೇ ವಿಧಿ), ಹೀಗೆ ಪ್ರಜೆಗಳು ಆಡಳಿತದಲ್ಲಿ ಪರೋಕ್ಷವಾಗಿ ಭಾಗವಹಿಸುವುದನ್ನು ಕಾಣಬಹುದು.

12. ಜಾತ್ಯಾತೀತತೆ

1976ರ ಸಂವಿಧಾನದ 42ನೇ ತಿದ್ದುಪಡಿ ಕಾಯ್ದೆಯ ಮೂಲಕ ಜಾತ್ಯಾತೀತ ಎಂಬ ಪದವನ್ನು ಸಂವಿಧಾನಕ್ಕೆ ಸೇರಿಸಲಾಯಿತು. ಸಂವಿಧಾನದ 25ರಿಂದ 28ನೇ ವಿಧಿಯು ಧಾರ್ಮಿಕ ಸ್ವಾತಂತ್ರಕ್ಕೆ ಅವಕಾಶವನ್ನು ಕಲ್ಪಿಸುತ್ತದೆ. ಭಾರತವು ಒಂದು ಜಾತ್ಯಾತೀತ ರಾಷ್ಟ್ರವಾಗಿದೆ. ಭಾರತವು ತನ್ನದೇ ಆದ ರಾಷ್ಟ್ರಧರ್ಮವನ್ನು ಹೊಂದಿಲ್ಲ, ನಮ್ಮ ದೇಶದಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣಲಾಗುತ್ತದೆ. ಸರ್ಕಾರವು ಪ್ರಜೆಗಳ ಧಾರ್ಮಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಸಂವಿಧಾನವು ತನ್ನ ಪ್ರಜೆಗಳಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ, ಆದ್ದರಿಂದ ಒಬ್ಬ ಭಾರತೀಯನು ತನ್ನ ಮನಸಾಕ್ಷೆಗನುಗುಣವಾಗಿ ಯಾವುದೇ ಧರ್ಮವನ್ನು ಪಾಲಿಸುವ, ಆರಾಧಿಸುವ ಹಾಗೂ ಪ್ರಚಾರಪಡಿಸುವ ಸ್ವಾತಂತ್ರ್ಯ ಹೊಂದಿದ್ದಾನೆ.

13. ಸಾರ್ವಭೌಮ ರಾಷ್ಟ್ರ

ಭಾರತವು ಒಂದು ಸಾರ್ವಭೌಮ ರಾಷ್ಟ್ರವಾಗಿದೆ. ಇದು ಆಂತರಿಕ ಶ್ರೇಷ್ಠತೆಯನ್ನು ಹಾಗೂ ಬಾಹ್ಯ ಸ್ವಾತಂತ್ರ್ಯವನ್ನು ಪಡೆದುಕೊಂಡಿದೆ. ಅಂದರೆ ನಮ್ಮ ರಾಷ್ಟ್ರವು ಆಂತರಿಕವಾಗಿ ಸರ್ವೋಚ್ಚ ಅಧಿಕಾರವನ್ನು ಹಾಗೂ ಬಾಹ್ಯವಾಗಿ ಅನ್ಯ ರಾಷ್ಟ್ರಗಳಿಂದ ಸಂಪೂರ್ಣ ಸ್ವತಂತ್ರವನ್ನು ಪಡೆದಿದೆ. ಆದ್ದರಿಂದ ಭಾರತವು ತನ್ನದೇ ಆದ ಸ್ವತಂತ್ರ ವಿದೇಶಾಂಗ ನೀತಿಯನ್ನು ಪಾಲಿಸಬಹುದು.

14. ಗಣರಾಜ್ಯ

ರಾಷ್ಟ್ರದ ಮುಖ್ಯಸ್ಥರನ್ನು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಚುನಾಯಿಸುವ ರಾಜಕೀಯ ವ್ಯವಸ್ಥೆಯನ್ನು ಗಣರಾಜ್ಯ ಎಂದು ಕರೆಯಲಾಗುತ್ತದೆ. ಭಾರತದ ಸಂವಿಧಾನಕ್ಕೆ ಗಣರಾಜ್ಯವನ್ನು ಐರ್ಲೆಂಡ್ ಸಂವಿಧಾನದಿಂದ ಎರವಲು ಪಡೆಯಲಾಗಿದೆ. ಭಾರತದ ಮುಖ್ಯಸ್ಥರಾದ ರಾಷ್ಟ್ರಾಧ್ಯಕ್ಷರನ್ನು ಪರೋಕ್ಷ ಚುನಾವಣೆಯಿಂದ ಆಯ್ಕೆ ಮಾಡುವುದರಿಂದ ಭಾರತವು ಒಂದು ಗಣರಾಜ್ಯವಾಗಿದೆ. ‘ಗಣರಾಜ್ಯ’ ಎಂಬ ಪದವು ಭಾರತ ಸರ್ಕಾರದ ಯಾವುದೇ ಅನುವಂಶೀಯ ರಾಜ ಅಥವಾ ರಾಣಿಯ ಆಳ್ವಿಕೆಗೆ ಒಳಪಟ್ಟಿಲ್ಲ ಎಂಬುದನ್ನು ಸೂಚಿಸುತ್ತದೆ.

15. ತುರ್ತುಪರಿಸ್ಥಿತಿ

ಭಾರತ ಸಂವಿಧಾನಕ್ಕೆ ತುರ್ತು ಪರಿಸ್ಥಿತಿಯನ್ನು ಜರ್ಮನಿಯ ಸಂವಿಧಾನದಿಂದ ಎರವಲು ಪಡಯಲಾಗಿದೆ. ರಾಷ್ಟ್ರದ ಆರ್ಥಿಕ ಸ್ಥಿರತೆಗೆ ಧಕ್ಕೆಯಾದಗಿದಾಗ ರಾಷ್ಟ್ರಾಧ್ಯಕ್ಷರು ಆರ್ಥಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಬಹುದು. ರಾಷ್ಟ್ರಾಧ್ಯಕ್ಷರು ಸಂಧಿಗ್ದ ಪರಸ್ಥಿತಿಗಳಲ್ಲಿ ಮೂರು ಬಗೆಯ ತುರ್ತು ಪರಿಸ್ಥಿತಿಗಳನ್ನು ಘೋಷಿಸುವ ಅಧಿಕಾರವನ್ನು ಹೊಂದಿದ್ದಾರೆ. ರಾಷ್ಟ್ರಾಧ್ಯಕ್ಷರು ವಿದೇಶಿ ಆಕ್ರಮಣ, ಸಶಸ್ತ್ರ ಬಂಡಾಯ, ಯುದ್ಧ ಈ ಕಾರಣಗಳಿಂದ ರಾಷ್ಟ್ರೀಯ ಭದ್ರತೆಗೆ ಗಂಡಾಂತರ ಒದಗಬಹುದು ಎಂದು ಭಾವಿಸಿದಲ್ಲಿ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಘೋಷಿಸಬಹುದು. ಸಂವಿಧಾನಾತ್ಮಕ ಯಂತ್ರವು ಕುಸಿದು ಬಿದ್ದ ರಾಜ್ಯಗಳಲ್ಲಿ ರಾಷ್ಟ್ರಾಧ್ಯಕ್ಷರು ತಮ್ಮ ಆಳ್ವಿಕೆಯನ್ನು ಘೋಷಿಸಬಹುದು.

1962ರಲ್ಲಿ ಭಾರತ ಮತ್ತು ಚೀನಾದ ನಡುವೆ ಹಾಗೂ 1971ರಲ್ಲಿ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ದಗಳು ನಡೆದಾಗ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಘೋಷಿಸಲಾಯಿತು.
1975ರಲ್ಲಿ ಆಂತರಿಕ ಗಲಭೆಯ ಕಾರಣದಿಂದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು.

16. ಪಂಚಾಯತ್ ರಾಜ್ ವ್ಯವಸ್ಥೆ

73ನೇಯ ತಿದ್ದುಪಡಿ ಕಾಯ್ದೆಯ ಮೂಲಕ 1993ರಲ್ಲಿ ಹೊಸ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು. ಈ ಕಾಯ್ದೆಯು 3 ಹಂತದ ಪಂಚಾಯತ್ ರಾಜ್ ವ್ಯವಸ್ಥೆಗೆ ಅವಕಾಶ ಮಾಡಿಕೊಟ್ಟಿದೆ. ಗ್ರಾಮ ಮಟ್ಟಗಳಲ್ಲಿ ಗ್ರಾಮ ಪಂಚಾಯತಿ, ತಾಲ್ಲೂಕು ಮಟ್ಟಗಳಲ್ಲಿ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಮಟ್ಟಗಳಲ್ಲಿ ಜಿಲ್ಲಾ ಪಂಚಾಯತಿಗಳು ಇವೆ. 73ನೇಯ ತಿದ್ದುಪಡಿ ಕಾಯ್ದೆಯು ಭಾರತದ ಗ್ರಾಮೀಣ ಸ್ಥಳೀಯ ಸರ್ಕಾರಗಳ ಇತಿಹಾಸದಲ್ಲಿ ಒಂದು ಮಹತ್ವದ ಮೈಲಿಗಲ್ಲು.

17. ದ್ವಿಸದನ ಶಾಸಕಾಂಗ ಪದ್ದತಿ

ಶಾಸಕಾಂಗವಾದ ಸಂಸತ್ತು ದ್ವಿಸದನ ಪದ್ದತಿಯ ಆಧಾರದ ಮೇಲೆ ರಚನೆಯಾಗಿದೆ. ಆದ್ದರಿಂದ ಇದು ಕೆಳಮನೆ ಮತ್ತು ಮೇಲ್ಮನೆ ಎಂಬ ಎರಡು ಸದನಗಳನ್ನು ಹೊಂದಿದೆ. ಸಂಸತ್ತಿನ ಕೆಳಮನೆಯಾದ ಲೋಕಸಭೆ ಜನರನ್ನು ಪ್ರತಿನಿಧಿಸಿದರೆ, ಮೇಲ್ಮನೆಯಾದ ರಾಜ್ಯಸಭೆಯ ರಾಜ್ಯಗಳನ್ನು ಪ್ರತಿನಿಧಿಸುತ್ತದೆ. ಭಾರತದ ಸಂವಿಧಾನಕ್ಕೆ ದ್ವಿಸದನ ಶಾಸಕಾಂಗ ಪದ್ದತಿಯನ್ನು ಬ್ರಿಟಿಷ್ ಸಂವಿಧಾನದಿಂದ ಎರವಲು ಪಡೆಯಲಾಗಿದೆ.

18. ಸಂಯುಕ್ತ ಪದ್ದತಿ

ಭಾರತ ಸರ್ಕಾರ ಕಾಯ್ದೆ, 1935ರಿಂದ ಸಂಯುಕ್ತ ಪದ್ದತಿಯನ್ನು ಭಾರತದ ಸಂವಿಧಾನಕ್ಕೆ ಸೇರಿಸಲಾಯಿತು. ಭಾರತ ಸಂವಿಧಾನವು ಒಕ್ಕೂಟ ವ್ಯವಸ್ಥೆಗೆ ಅವಕಾಶವನ್ನು ಕಲ್ಪಿಸುತ್ತದೆ. ಒಕ್ಕೂಟ ವ್ಯವಸ್ಥೆ ಎಂದರೆ, ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ಅಧಿಕಾರದ ಹಂಚಿಕೆಯಾಗಿದೆ. ಭಾರತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಂವಿಧಾನಾತ್ಮಕವಾದ ಅಧಿಕಾರ ವಿಭಜನೆಯನ್ನು ಕಾಣಬಹುದು. ವಿದೇಶಾಂಗ ವ್ಯವಹಾರ, ರಕ್ಷಣೆ, ಅಂತರಾಜ್ಯ ವ್ಯಾಪಾರ, ರೇಲ್ವೆ, ಅಂಚೆ ಮತ್ತು ತಂತಿ, ನಾಗರಿಕ ವಿಮಾನಯಾನ, ಆದುದು ಮತ್ತು ರಫ್ತು ಮುಂತಾದ ರಾಷ್ಟ್ರಿಯ ಮಹತ್ವವನ್ನು ಪಡೆದ 99 ವಿಷಯಗಳಿಗೆ ಸಂಬಂಧಿಸಿದಂತೆ ಕಾಯ್ದೆಯನ್ನು ರೂಪಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ. ಸಾರ್ವಜನಿಕ ಆರೋಗ್ಯ, ಪೋಲಿಸ್, ಬಂಧೀಖಾನೆ, ಸಾರ್ವಜನಿಕ ಶಾಂತಿಪಾಲನೆ, ವಾಣಿಜ್ಯ ತೆರಿಗೆ, ಮುಂತಾದ ಸ್ಥಳೀಯ ಮಹತ್ವ ಪಡೆದ 61 ವಿಷಯಗಳಿಗೆ ಸಂಬಂಧಿಸಿದಂತೆ ಕಾಯ್ದೆ ರೂಪಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

Published

on

~ಗೋವರ್ಧನ ನವಿಲೇಹಾಳು

ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.

ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು  ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ  ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ;  ಎಚ್ಚರಿಕೆಯೂ ಹೌದು.

ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಎಲೆಕ್ಟ್ರಾಲ್ ಬಾಂಡ್‌ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್‌ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.

ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.

ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್‌ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.

ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್‌ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್‌ಗಳಾಗಿ ಪರಿವರ್ತಿಸುತ್ತದೆ.

ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.

ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ

ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.

ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.

ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.

ಸುದ್ದಿದಿನ | ವಾಟ್ಸಾಪ್ | 9980346243

Continue Reading

ದಿನದ ಸುದ್ದಿ

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

Published

on

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು  ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

Continue Reading
Advertisement

Title

ದಿನದ ಸುದ್ದಿ2 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ2 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ2 days ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

ದಿನದ ಸುದ್ದಿ3 days ago

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

~ಗೋವರ್ಧನ ನವಿಲೇಹಾಳು ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ...

ದಿನದ ಸುದ್ದಿ4 days ago

ಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ‌ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ದಿನದ ಸುದ್ದಿ4 days ago

ಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ: ಜನರು ಹೆಚ್ಚಿನ ನಿರೀಕ್ಷೆಯೊಂದಿಗೆ ಮತದಾನಕ್ಕೆ ಸಜ್ಜಾಗಿದ್ದಾರೆ. ಅಪ್ಪಾಜಿ ಅವರು ಜಾತಿ, ಮತ, ಪಕ್ಷ ಮತ್ತು ಧರ್ಮ ಬೇಧವಿಲ್ಲದೆ ಎಲ್ಲರನ್ನು ಸಮಾನವಾಗಿ ನೋಡುತ್ತಿದ್ದ ಅಜಾತ ಶತ್ರುಗಳಾಗಿದ್ದರು. ಅದೇ...

ದಿನದ ಸುದ್ದಿ4 days ago

ಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು

–ಗೋವರ್ಧನ ನವಿಲೇಹಾಳು ಕರ್ನಾಟಕದ ರಾಜಕೀಯ ಆಖಾಡದಲ್ಲಿ ಏಪ್ರಿಲ್ 9, 2026ರಂದು ನಡೆಯುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗಳು ಕೇವಲ ಎರಡು ಸೀಟುಗಳ ಚುನಾವಣೆಯಲ್ಲ. ಇದು...

ದಿನದ ಸುದ್ದಿ2 weeks ago

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ...

ದಿನದ ಸುದ್ದಿ2 weeks ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ3 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

Trending