ದಿನದ ಸುದ್ದಿ
ದಾವಣಗೆರೆ | ಕೋವಿಡ್ ಹಿನ್ನೆಲೆ ನಷ್ಟ : ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಕೆಎಸ್‍ಆರ್‍ಟಿಸಿ ಕಾರ್ಯಾಚರಣೆ : ಕೆ ಎಸ್ ಆರ್ ಟಿ ಸಿ ನಿಮಗ ಅಧ್ಯಕ್ಷ ಚಂದ್ರಪ್ಪ
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೋವಿಡ್ ಹಿನ್ನೆಲೆಯಲ್ಲಿ ನಷ್ಟದಲ್ಲಿದ್ದರೂ ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಹಾಗೂ ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಉತ್ತಮವಾಗಿ ಕಾರ್ಯಾಚರಣೆ ಮಾಡುತ್ತಿದೆ. ಸೇವಾ ಮನೋಭಾವವೇ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪ ಹೇಳಿದರು.
ಶುಕ್ರವಾರ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿ ಡಿಪೋ ವೀಕ್ಷಣೆ ನಡೆಸಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯ ನೆರವು
ಕೆಎಸ್‍ಆರ್‍ಟಿಸಿ ಹಿಂದೆ ಲಾಭವೂ ಇಲ್ಲ. ನಷ್ಟವೂ ಇಲ್ಲವೆಂಬಂತೆ ಕಾರ್ಯಾಚರಣೆ ಮಾಡುತ್ತಿತ್ತು. ಕೋವಿಡ್ ಬಂದ ನಂತರ ರಾಜ್ಯಾದ್ಯಂತ ಅಂದಾಜು 1500 ಕೋಟಿ ನಷ್ಟ ಅನುಭವಿಸಿತು. ರಾಜ್ಯ ಸರ್ಕಾರ 1350 ಕೋಟಿ ಬಿಡುಗಡೆ ಮಾಡುವ ಮೂಲಕ ಅಧಿಕಾರಿ/ಸಿಬ್ಬಂದಿಗಳಿಗೆ ವೇತನ, ವಾಹನಗಳ ನಿರ್ವಹಣೆ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ನೌಕರರು ಉತ್ತಮವಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಂಸ್ಥೆ ನಷ್ಟದಲ್ಲಿದ್ದರೂ ಸರ್ಕಾರ ವೇತನ ನೀಡುತ್ತಿದ್ದು, ಮುಖ್ಯಮಂತ್ರಿಗಳು ಅಭಿನಂದನೀಯ ಎಂದರು.
ಅಂತರರಾಜ್ಯ ಕಾರ್ಯಾಚರಣೆ
ಅಂತರ ರಾಜ್ಯ ಬಸ್ ಕಾರ್ಯಾಚರಣೆ ಆರಂಭವಾಗಿದ್ದು ಗೋವಾ, ಆಂಧ್ರ ಮತ್ತು ಈಗ ಮಹಾರಾಷ್ಟ್ರಕ್ಕೂ ಅನುಮತಿ ದೊರೆತಿದೆ. ಇದೀಗ ಶೇ.50 ಆದಾಯ ಬರುತ್ತಿದೆ. ಖಾಸಗಿ ಸಂಸ್ಥೆಗಳು ನಷ್ಟದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಿಲ್ಲಿಸಿವೆ. ಆದರೆ ರಾಜ್ಯ ರಸ್ತೆ ಸಾರಿಗೆಯ ಉದ್ದೇಶ ಸೇವೆ ಆಗಿದೆ. ನಷ್ಟದಲ್ಲಿಯೂ ಕೆಲಸ ಮಾಡುತ್ತಿದ್ದು, ಉತ್ತಮ ಸೇವೆಗಾಗಿ ನಮ್ಮ ಸಂಸ್ಥೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ ಎಂದರು.
ಮೂಲಭೂತ ಸೌಕರ್ಯಕ್ಕೆ ಒತ್ತು
ಬಸ್ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳು, ಮಹಿಳೆಯರಿಗೆ ಶೌಚಾಲಯ ಸೇರಿದಂತೆ ಉತ್ತಮ ವ್ಯವಸ್ಥೆಗಳನ್ನು ಮಾಡಲಾಗುವುದು. ಜೊತೆಗೆ ರೈಲ್ವೇ ಮತ್ತು ವಿಮಾನ ನಿಲ್ದಾಣಗಳ ರೀತಿಯಲ್ಲಿ ಬಸ್‍ಗಳು ಇಷ್ಟೇ ಸಮಯಕ್ಕೆ ಬರುತ್ತವೆ ಎಂದು ಮಾಹಿತಿ ನೀಡುವ ಡಿಜಿಟಲ್ ಬೋರ್ಡ್‍ಗಳ ಅಳವಡಿಕೆ, ಗಣಕೀಕರಣ ವ್ಯವಸ್ಥೆ ಮಾಡಲಾಗುವುದು ಎಂದರು.
ಸಂಸ್ಥೆಗೆ ಸಾಲವಾದರೂ ಪರವಾಗಿಲ್ಲ. ನೌಕರರ ಮತ್ತು ಎಲ್ಲ ವರ್ಗದ ಜನರ ಹಿತ ಕಾಪಾಡುವುದು ಮುಖ್ಯ ಉದ್ದೇಶವಾಗಿದೆ. ಸದ್ಯ ಕೋವಿಡ್ ಹಿನ್ನೆಲೆಯಲ್ಲಿ ಹೊಸ ಬಸ್‍ಗಳು ಮತ್ತು ಮಾರ್ಗಗಳಿಗೆ ಅವಕಾಶ ಇಲ್ಲವಾಗಿದೆ ಎಂದರು.
ದಾವಣಗೆರೆ ನಗರದಲ್ಲಿ ಪ್ರಸ್ತುತ ಒಟ್ಟು 40 ಬಸ್ ಓಡಾಡುತ್ತಿದ್ದು, ರೈತರು ಹಾಲು, ತರಕಾರಿ ಇತರೆ ಸಾಗಿಸಲು ಅನುಕೂಲವಾಗುವ ದೃಷ್ಟಿಯಿಂದ ಸುತ್ತಮುತ್ತಲಿನ ಹಳ್ಳಿಗಳಿಗೆ ಬಸ್ ಕಾರ್ಯಾಚರಣೆ ವಿಸ್ತರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ದಾವಣಗೆರೆ ವಿಭಾಗದಲ್ಲಿ 21 ವೊಲ್ವೊ, 29 ರಾಜಹಂಸ, 06 ನಾನ್ ಎಸಿ ಸ್ಲೀಪರ್, 195 ಕರ್ನಾಟಕ ಸಾರಿಗೆ, 56 ನಗರ ಸಾರಿಗೆ ಸೇರಿದಂತೆ ಒಟ್ಟು 356 ಬಸ್‍ಗಳು ಕಾರ್ಯಾಚರಣೆ ಮಾಡುತ್ತಿವೆ. ವಿಭಾಗದಲ್ಲಿ ಒಟ್ಟು 1580 ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಸಿಬ್ಬಂದಿ ವೇತನ ತಿಂಗಳಿಗೆ ಸರಾಸರಿ ರೂ.574.86 ಲಕ್ಷ, ಇಂಧನ ವೆಚ್ಚ ರೂ.502.85 ಲಕ್ಷ ಮತ್ತು ಇತರೆ ಖರ್ಚು ಸೇರಿದಂತೆ ಸರಾಸರಿ ರೂ.1405.65 ಲಕ್ಷ ವೆಚ್ಚವಾಗುತ್ತದೆ ಎಂದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ರೂ.96 ಕೋಟಿ ಮೊತ್ತದಲ್ಲಿ ಆಧುನಿಕ ಮಾದರಿ ಬಸ್ ನಿಲ್ದಾಣ ನಿರ್ಮಾಣ ಮಾಡುವ ಯೋಜನೆಯು ನವೆಂಬರ್ 2020 ರಿಂದ ಪ್ರಾರಂಭವಾಗಲಿದೆ. ಪ್ರಸ್ತುತವಿರುವ ಬಸ್ ನಿಲ್ದಾಣವನ್ನು ಸ್ಥಳಾಂತರಿಸಲು ಹೈಸ್ಕೂಲ್ ಮೈದಾನದಲ್ಲಿ ರೂ.2.86 ಕೋಟಿ ಮೊತ್ತದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು ಮುಕ್ತಾಯ ಹಂತದಲ್ಲಿರುತ್ತದೆ.
ದಾವಣಗೆರೆ ನಗರ ಪ್ರದೇಶದಲ್ಲಿರುವ ಬೇತೂರು ರಸ್ತೆಯಲ್ಲಿನ ಸಂಸ್ಥೆಯ ನಿವೇಶನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರೂ.10.00 ಕೋಟಿ ಮೊತ್ತದಲ್ಲಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ನಿರ್ಮಿಸುವ ಪ್ರಸ್ತಾವನೆ ಇದೆ. ದಾವಣಗೆರೆ ವಿಭಾಗೀಯ ಕಾರ್ಯಾಗಾರದಲ್ಲಿ ನಗರ ಸಾರಿಗೆ ಘಟಕ-2 ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚನ್ನಗಿರಿ ನಗರದಲ್ಲಿ ಬಸ್ ಘಟಕ ನಿರ್ಮಾಣಕ್ಕೆ ಈಗಾಗಲೇ ನಿವೇಶನ ಮಂಜೂರಾಗಿದ್ದು ಎಸ್‍ಡಿಪಿ ಯೋಜನೆಯಡಿಯಲ್ಲಿ ಅಂದಾಜು ವೆಚ್ಚ ರೂ.8.00 ಕೋಟಿ ಮೊತ್ತದಲ್ಲಿ ಘಟಕ ನಿರ್ಮಾಣ ಮಾಡಲು ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿರುತ್ತದೆ.
ಚಿಕ್ಕಮಗಳೂರು ಮಾರ್ಗ ಬಸ್ ಉದ್ಘಾಟನೆ
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂದು ನೂತನವಾಗಿ ಕಾರ್ಯಾಚರಣೆ ಪ್ರಾರಂಭಿಸಿದ ದಾವಣಗೆರೆಯಿಂದ ಬಾಡ, ಸಂತೆಬೆನ್ನೂರು, ಚನ್ನಗಿರಿ ಹಾಗೂ ಅಜ್ಜಂಪುರ ಮಾರ್ಗವಾಗಿ ಚಿಕ್ಕಮಗಳೂರಿಗೆ ಹೋಗುವ ಬಸ್‍ಗೆ ಕರ್ನಾಟಕ ರಾಜ್ಯ ರಸ್ತೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪನವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕ.ರಾ.ರ.ಸಾ ನಿಗಮದ ವಿಭಾಗೀಯ ನಿಯಂತ್ರಾಣಾಧಿಕಾರಿ ಸಿದ್ದೇಶ್ವರ ಹೆಬ್ಬಾರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


