Connect with us

ದಿನದ ಸುದ್ದಿ

ದಾವಣಗೆರೆ | ಕೋವಿಡ್ ಹಿನ್ನೆಲೆ ನಷ್ಟ : ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಕೆಎಸ್‍ಆರ್‍ಟಿಸಿ ಕಾರ್ಯಾಚರಣೆ : ಕೆ ಎಸ್ ಆರ್ ಟಿ ಸಿ ನಿಮಗ ಅಧ್ಯಕ್ಷ ಚಂದ್ರಪ್ಪ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೋವಿಡ್ ಹಿನ್ನೆಲೆಯಲ್ಲಿ ನಷ್ಟದಲ್ಲಿದ್ದರೂ ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಹಾಗೂ ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಉತ್ತಮವಾಗಿ ಕಾರ್ಯಾಚರಣೆ ಮಾಡುತ್ತಿದೆ. ಸೇವಾ ಮನೋಭಾವವೇ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪ ಹೇಳಿದರು.

ಶುಕ್ರವಾರ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿ ಡಿಪೋ ವೀಕ್ಷಣೆ ನಡೆಸಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯ ನೆರವು

ಕೆಎಸ್‍ಆರ್‍ಟಿಸಿ ಹಿಂದೆ ಲಾಭವೂ ಇಲ್ಲ. ನಷ್ಟವೂ ಇಲ್ಲವೆಂಬಂತೆ ಕಾರ್ಯಾಚರಣೆ ಮಾಡುತ್ತಿತ್ತು. ಕೋವಿಡ್ ಬಂದ ನಂತರ ರಾಜ್ಯಾದ್ಯಂತ ಅಂದಾಜು 1500 ಕೋಟಿ ನಷ್ಟ ಅನುಭವಿಸಿತು. ರಾಜ್ಯ ಸರ್ಕಾರ 1350 ಕೋಟಿ ಬಿಡುಗಡೆ ಮಾಡುವ ಮೂಲಕ ಅಧಿಕಾರಿ/ಸಿಬ್ಬಂದಿಗಳಿಗೆ ವೇತನ, ವಾಹನಗಳ ನಿರ್ವಹಣೆ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ನೌಕರರು ಉತ್ತಮವಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಂಸ್ಥೆ ನಷ್ಟದಲ್ಲಿದ್ದರೂ ಸರ್ಕಾರ ವೇತನ ನೀಡುತ್ತಿದ್ದು, ಮುಖ್ಯಮಂತ್ರಿಗಳು ಅಭಿನಂದನೀಯ ಎಂದರು.

ಅಂತರರಾಜ್ಯ ಕಾರ್ಯಾಚರಣೆ

ಅಂತರ ರಾಜ್ಯ ಬಸ್ ಕಾರ್ಯಾಚರಣೆ ಆರಂಭವಾಗಿದ್ದು ಗೋವಾ, ಆಂಧ್ರ ಮತ್ತು ಈಗ ಮಹಾರಾಷ್ಟ್ರಕ್ಕೂ ಅನುಮತಿ ದೊರೆತಿದೆ. ಇದೀಗ ಶೇ.50 ಆದಾಯ ಬರುತ್ತಿದೆ. ಖಾಸಗಿ ಸಂಸ್ಥೆಗಳು ನಷ್ಟದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಿಲ್ಲಿಸಿವೆ. ಆದರೆ ರಾಜ್ಯ ರಸ್ತೆ ಸಾರಿಗೆಯ ಉದ್ದೇಶ ಸೇವೆ ಆಗಿದೆ. ನಷ್ಟದಲ್ಲಿಯೂ ಕೆಲಸ ಮಾಡುತ್ತಿದ್ದು, ಉತ್ತಮ ಸೇವೆಗಾಗಿ ನಮ್ಮ ಸಂಸ್ಥೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ ಎಂದರು.

ಮೂಲಭೂತ ಸೌಕರ್ಯಕ್ಕೆ ಒತ್ತು

ಬಸ್ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳು, ಮಹಿಳೆಯರಿಗೆ ಶೌಚಾಲಯ ಸೇರಿದಂತೆ ಉತ್ತಮ ವ್ಯವಸ್ಥೆಗಳನ್ನು ಮಾಡಲಾಗುವುದು. ಜೊತೆಗೆ ರೈಲ್ವೇ ಮತ್ತು ವಿಮಾನ ನಿಲ್ದಾಣಗಳ ರೀತಿಯಲ್ಲಿ ಬಸ್‍ಗಳು ಇಷ್ಟೇ ಸಮಯಕ್ಕೆ ಬರುತ್ತವೆ ಎಂದು ಮಾಹಿತಿ ನೀಡುವ ಡಿಜಿಟಲ್ ಬೋರ್ಡ್‍ಗಳ ಅಳವಡಿಕೆ, ಗಣಕೀಕರಣ ವ್ಯವಸ್ಥೆ ಮಾಡಲಾಗುವುದು ಎಂದರು.

ಸಂಸ್ಥೆಗೆ ಸಾಲವಾದರೂ ಪರವಾಗಿಲ್ಲ. ನೌಕರರ ಮತ್ತು ಎಲ್ಲ ವರ್ಗದ ಜನರ ಹಿತ ಕಾಪಾಡುವುದು ಮುಖ್ಯ ಉದ್ದೇಶವಾಗಿದೆ. ಸದ್ಯ ಕೋವಿಡ್ ಹಿನ್ನೆಲೆಯಲ್ಲಿ ಹೊಸ ಬಸ್‍ಗಳು ಮತ್ತು ಮಾರ್ಗಗಳಿಗೆ ಅವಕಾಶ ಇಲ್ಲವಾಗಿದೆ ಎಂದರು.

ದಾವಣಗೆರೆ ನಗರದಲ್ಲಿ ಪ್ರಸ್ತುತ ಒಟ್ಟು 40 ಬಸ್ ಓಡಾಡುತ್ತಿದ್ದು, ರೈತರು ಹಾಲು, ತರಕಾರಿ ಇತರೆ ಸಾಗಿಸಲು ಅನುಕೂಲವಾಗುವ ದೃಷ್ಟಿಯಿಂದ ಸುತ್ತಮುತ್ತಲಿನ ಹಳ್ಳಿಗಳಿಗೆ ಬಸ್ ಕಾರ್ಯಾಚರಣೆ ವಿಸ್ತರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ದಾವಣಗೆರೆ ವಿಭಾಗದಲ್ಲಿ 21 ವೊಲ್ವೊ, 29 ರಾಜಹಂಸ, 06 ನಾನ್ ಎಸಿ ಸ್ಲೀಪರ್, 195 ಕರ್ನಾಟಕ ಸಾರಿಗೆ, 56 ನಗರ ಸಾರಿಗೆ ಸೇರಿದಂತೆ ಒಟ್ಟು 356 ಬಸ್‍ಗಳು ಕಾರ್ಯಾಚರಣೆ ಮಾಡುತ್ತಿವೆ. ವಿಭಾಗದಲ್ಲಿ ಒಟ್ಟು 1580 ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಸಿಬ್ಬಂದಿ ವೇತನ ತಿಂಗಳಿಗೆ ಸರಾಸರಿ ರೂ.574.86 ಲಕ್ಷ, ಇಂಧನ ವೆಚ್ಚ ರೂ.502.85 ಲಕ್ಷ ಮತ್ತು ಇತರೆ ಖರ್ಚು ಸೇರಿದಂತೆ ಸರಾಸರಿ ರೂ.1405.65 ಲಕ್ಷ ವೆಚ್ಚವಾಗುತ್ತದೆ ಎಂದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ರೂ.96 ಕೋಟಿ ಮೊತ್ತದಲ್ಲಿ ಆಧುನಿಕ ಮಾದರಿ ಬಸ್ ನಿಲ್ದಾಣ ನಿರ್ಮಾಣ ಮಾಡುವ ಯೋಜನೆಯು ನವೆಂಬರ್ 2020 ರಿಂದ ಪ್ರಾರಂಭವಾಗಲಿದೆ. ಪ್ರಸ್ತುತವಿರುವ ಬಸ್ ನಿಲ್ದಾಣವನ್ನು ಸ್ಥಳಾಂತರಿಸಲು ಹೈಸ್ಕೂಲ್ ಮೈದಾನದಲ್ಲಿ ರೂ.2.86 ಕೋಟಿ ಮೊತ್ತದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು ಮುಕ್ತಾಯ ಹಂತದಲ್ಲಿರುತ್ತದೆ.

ದಾವಣಗೆರೆ ನಗರ ಪ್ರದೇಶದಲ್ಲಿರುವ ಬೇತೂರು ರಸ್ತೆಯಲ್ಲಿನ ಸಂಸ್ಥೆಯ ನಿವೇಶನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರೂ.10.00 ಕೋಟಿ ಮೊತ್ತದಲ್ಲಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ನಿರ್ಮಿಸುವ ಪ್ರಸ್ತಾವನೆ ಇದೆ. ದಾವಣಗೆರೆ ವಿಭಾಗೀಯ ಕಾರ್ಯಾಗಾರದಲ್ಲಿ ನಗರ ಸಾರಿಗೆ ಘಟಕ-2 ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚನ್ನಗಿರಿ ನಗರದಲ್ಲಿ ಬಸ್ ಘಟಕ ನಿರ್ಮಾಣಕ್ಕೆ ಈಗಾಗಲೇ ನಿವೇಶನ ಮಂಜೂರಾಗಿದ್ದು ಎಸ್‍ಡಿಪಿ ಯೋಜನೆಯಡಿಯಲ್ಲಿ ಅಂದಾಜು ವೆಚ್ಚ ರೂ.8.00 ಕೋಟಿ ಮೊತ್ತದಲ್ಲಿ ಘಟಕ ನಿರ್ಮಾಣ ಮಾಡಲು ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿರುತ್ತದೆ.

ಚಿಕ್ಕಮಗಳೂರು ಮಾರ್ಗ ಬಸ್ ಉದ್ಘಾಟನೆ

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂದು ನೂತನವಾಗಿ ಕಾರ್ಯಾಚರಣೆ ಪ್ರಾರಂಭಿಸಿದ ದಾವಣಗೆರೆಯಿಂದ ಬಾಡ, ಸಂತೆಬೆನ್ನೂರು, ಚನ್ನಗಿರಿ ಹಾಗೂ ಅಜ್ಜಂಪುರ ಮಾರ್ಗವಾಗಿ ಚಿಕ್ಕಮಗಳೂರಿಗೆ ಹೋಗುವ ಬಸ್‍ಗೆ ಕರ್ನಾಟಕ ರಾಜ್ಯ ರಸ್ತೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪನವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕ.ರಾ.ರ.ಸಾ ನಿಗಮದ ವಿಭಾಗೀಯ ನಿಯಂತ್ರಾಣಾಧಿಕಾರಿ ಸಿದ್ದೇಶ್ವರ ಹೆಬ್ಬಾರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending