ಅಂತರಂಗ
ಮತ್ತೊಂದು ಜೀವ ಮತ್ತದೇ ಬೇಸರ ಇನ್ನೆಷ್ಟು ದಿನ
- ನಾ ದಿವಾಕರ
ಉತ್ತರ ಪ್ರದೇಶ ಭಾರತದ ಅತ್ಯಾಚಾರ ಪ್ರದೇಶ ಆಗಿದೆ. ಯೋಗಿಯ ರಾಮರಾಜ್ಯದಲ್ಲಿ ಸೀತೆಯರಿಗೆ ರಕ್ಷಣೆಯಿಲ್ಲದಂತಾಗಿದೆ. ಈಗ ಮತ್ತೋರ್ವ ಯುವತಿ ಮನೀಷಾ ವಾಲ್ಮೀಕಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾಗಿದ್ದಾಳೆ. ದಲಿತ ಸಮುದಾಯಕ್ಕೆ ಸೇರಿದ 19 ವರ್ಷದ ಮನೀಷಾ ನಾಲ್ವರು ದುಷ್ಕರ್ಮಿಗಳ ಕಾಮತೃಷೆಗೆ ಬಲಿಯಾಗಿದ್ದಾಳೆ. ಎಂದಿನಂತೆ ಆರೋಪಿಗಳು ಮೇಲ್ಜಾತಿಯವರಾಗಿದ್ದಾರೆ.
ಆರೋಪಿಗಳನ್ನು ಬಂಧಿಸಲಾಗಿದೆ, ಅತ್ಯಾಚಾರಕ್ಕೊಳಗಾದ ಮನಿಷಾ ಹಲವು ದಿನಗಳ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಮತ್ತದೇ ಹಲವು ಲಕ್ಷ ರೂಗಳ ಪರಿಹಾರ, ತನಿಖೆ, ವಿಚಾರಣೆ, ಆರೋಪಿಗಳಿಗೆ ಜಾಮೀನು , ನಂತರ ಸಾಕ್ಷ್ಯಾಧಾರಗಳಿಲ್ಲದೆ ಬಿಡುಗಡೆ. ಮನೀಷಾಳ ನಾಲಿಗೆ ಕತ್ತರಿಸಲಾಗಿದೆ, ಕಾಲು ತುಂಡಾಗಿದೆ ಎನ್ನಲಾಗಿದೆ. ಆದರೂ ಅತ್ಯಾಚಾರಿಗಳ ರಕ್ಷಣೆಗೆ ಯೋಗಿರಾಜ್ಯದ ಸವರ್ಣೀಯರು ಟೊಂಕಕಟ್ಟಿ ನಿಂತಿದ್ದಾರೆ.
ಯೋಗಿ ಆಡಳಿತದಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವುದಿಲ್ಲ ಎನ್ನುವುದು ಸಾಕಷ್ಟು ಬಾರಿ ನಿರೂಪಿತವಾಗಿದೆ. ನಿರಪರಾಧಿಗಳಿಗೆ ಉಗ್ರ ಶಿಕ್ಷೆ ಆಗುವುದನ್ನೂ ಕಫೀಲ್ ಖಾನ್ ಪ್ರಕರಣದಲ್ಲಿ ಕಂಡಿದ್ದೇವೆ. ಇದು ಬದಲಾಗುತ್ತಿರುವ ಭಾರತದ ದಿಕ್ಸೂಚಿ. ದೆಹಲಿ ಗಲಭೆಗಳಲ್ಲೂ ಗೋಲಿ ಮಾರೋ ಸಾಲೋಂಕೋ ಎಂದವರು, ಪೊಲೀಸರ ಎದುರಿನಲ್ಲೇ ಬಂದೂಕು ಬಳಸಿದವರು ಮುಕ್ತವಾಗಿ ಓಡಾಡುತ್ತಿದ್ದು ಅಮಾಯಕ ಉಮರ್ ಖಲೀದ್ ಬಂಧನಕ್ಕೊಳಗಾಗಿದ್ದಾನೆ. ಇದು ಪ್ರವರ್ಧಮಾನಕ್ಕೆ ಬರುತ್ತಿರುವ ನವ ಭಾರತದ ಹೊಸ ರೂಪ. ಉತ್ತರ ಪ್ರದೇಶ ಒಂದು ಪ್ರಾತ್ಯಕ್ಷಿಕೆ .
ಭಾರತದಂತಹ ಪಿತೃಪ್ರಧಾನ ಸಮಾಜದಲ್ಲಿ
ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಿದರೆ ಗಲ್ಲಿಗೇರುವವರು ಹೆಚ್ಚಾಗುತ್ತಾರೆಯೇ ವಿನಃ ಅತ್ಯಾಚಾರ, ದೌರ್ಜನ್ಯ ಕಡಿಮೆಯಾಗುವುದಿಲ್ಲ. ನಿರ್ಭಯ ಪ್ರಕರಣದ ನಂತರ ಮಹಿಳೆಯರ ರಕ್ಷಣೆಗಾಗಿ ಕಠಿಣ ಕಾನೂನು ರೂಪಿಸಿದ ಪ್ರಭುತ್ವಕ್ಕೆ ಭಾರತೀಯ ಸಮಾಜದಲ್ಲಿ ಅಂತರ್ಗತವಾಗಿರುವ ಪಿತೃ ಪ್ರಧಾನ ಧೋರಣೆ ಮತ್ತು ಮಹಿಳೆಯನ್ನು ಭೋಗವಸ್ತುವಿನಂತೆ ನೋಡುವ ಪುರುಷ ಸಮಾಜದ ಧೋರಣೆಯೂ ಅರ್ಥವಾಗಿರಬೇಕು.
ಕಾನೂನು ಅಪರಾಧವನ್ನು ತಡೆಗಟ್ಟುವ ಸಾಧನವಾಗಲಾರದು, ಅಪರಾಧ ಎಸಗುವವರಲ್ಲಿ ಭೀತಿ ಹುಟ್ಟಿಸಬಹುದಷ್ಟೆ. ಆದರೆ ಅಸಹಾಯಕ, ಅಮಾಯಕ ಮತ್ತು ದುರ್ಬಲ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಅತ್ಯಾಚಾರ ನಡೆಸುವವರ ದೃಷ್ಟಿ ಕಾನೂನು ಪುಸ್ತಕದ ಮೇಲಿರುವುದಿಲ್ಲ, ಮಹಿಳೆಯ ಮೇಲಿರುತ್ತದೆ. ನಮಗೆ ಶಿಕ್ಷೆಯಾಗುವುದಿಲ್ಲ ಎನ್ನುವ ಭಂಡತನ ಬೆಳೆಸಲು ರಾಜಕೀಯ ನಾಯಕರು ವ್ಯವಸ್ಥಿತವಾಗಿ ಪ್ರಯತ್ನಿಸಿದ್ದಾರೆ. ತನಿಖೆ ನಡೆಸುವ ಪೊಲೀಸ್ ಇಲಾಖೆ ಭಂಡ ಅತ್ಯಾಚಾರಿಗಳಿಗೆ, ಭ್ರಷ್ಟ ನಾಯಕರಿಗೆ ಒತ್ತಾಸೆಯಾಗಿ ನಿಲ್ಲುತ್ತದೆ. “ಅವರು ಮೇಲ್ಜಾತಿಯವರು ಕೆಳಜಾತಿಯ ಮಹಿಳೆಯ ಅತ್ಯಾಚಾರ ಮಾಡಿರಲಾರರು” ಎಂಬ ಮಾತನ್ನು ನ್ಯಾಯಪೀಠದಲ್ಲಿ ಕೇಳಿರುವ ದೇಶ ನಮ್ಮದು.
ಜನಕವಿ ಸಾಹಿರ್ ಲುಧಿಯಾನ್ವಿ , ಫಿರ್ ಸುಬಹ್ ಹೋಗಿ ಚಿತ್ರದ ಹಾಡೊಂದರಲ್ಲಿ ” ಮಿಟ್ಟಿ ಕಾ ಭೀ ಹೈ ಕುಚ್ ಮೋಲ್ ಮಗರ್ ಇನ್ಸಾನ್ ಕಿ ಕೀಮತ್ ಕುಚ್ ಭೀ ನಹ್ಞೀ ” ಎಂದು ಹೇಳುತ್ತಾರೆ. ಆರು ದಶಕಗಳು ಕಳೆದರೂ ಭಾರತ ಬದಲಾಗಿಲ್ಲ. ಏಕೆಂದರೆ ಇಲ್ಲಿ ಮಾನವ ಜೀವಕ್ಕೆ ಅಸ್ಮಿತೆ ಇರುವಂತೆಯೇ ಸಾವಿಗೂ ಅಸ್ಮಿತೆಯಿದೆ, ಶವಗಳಿಗೂ ಅಸ್ಮಿತೆ ಇದೆ. ಅಪರಾಧವನ್ನು ನಿಗ್ರಹಿಸಲು ಕಾನೂನು, ಪೊಲೀಸ್, ನ್ಯಾಯ ವ್ಯವಸ್ಥೆ ಇದ್ದರೂ ಅಪರಾಧಿಯ ನಿಷ್ಕರ್ಷೆಯನ್ನು ಸಾಕಷ್ಟು ಸಂದರ್ಭಗಳಲ್ಲಿ ಸಮಾಜವೇ ಮಾಡುತ್ತದೆ.
ಸಮಾಜ ಎನ್ನುವುದು ಬಲಾಢ್ಯರ ಹಿಡಿತದಲ್ಲಿರುತ್ತದೆ. ಬಲಾಢ್ಯರನ್ನು ಸಮಾಜದ ಮೇಲ್ ಸ್ತರದ ಸಮುದಾಯ ಪ್ರತಿನಿಧಿಸುತ್ತದೆ. ಈ ಚಕ್ರವ್ಯೂಹಕ್ಕೆ ಅಮಾಯಕ ಮಹಿಳೆಯರು ಬಲಿಯಾಗುತ್ತಲೇ ಇದ್ದಾರೆ. ಮನೀಷಾ ವಾಲ್ಮೀಕಿ ಮತ್ತೊಂದು ಜೀವ. ಪ್ರತಿಯೊಂದು ಅತ್ಯಾಚಾರ ನಡೆದಾಗಲೂ ಕಠಿಣ ಕಾನೂನುಗಳನ್ನು ಉಲ್ಲೇಖಿಸುವ ಸರಕಾರಗಳಿಗೆ ಮನೀಷಾಳಂತಹ ಜೀವಗಳು ನಿಕೃಷ್ಟವಾಗಿ ಕಾಣುತ್ತವೆ. ಏಕೆಂದರೆ ಇದು ದೆಹಲಿ, ಕೊಲ್ಕತ್ತಾ, ಬೆಂಗಳೂರಿನಲ್ಲಿ ನಡೆದುದಲ್ಲ. ರಾಜಕೀಯವಾಗಿ ಲಾಭದಾಯಕವೂ ಅಲ್ಲ.
ಈಗಾಗಲೇ ಉತ್ತರ ಪ್ರದೇಶದ ಪೊಲೀಸರು ಮನೀಷಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳಿಲ್ಲ ಎಂದು ನಿರೂಪಿಸಲು ರಂಗಸಜ್ಜಿಕೆ ಮಾಡಿರುತ್ತಾರೆ. ಆರೋಪಿಗಳ ಪರ ಮೇಲ್ಜಾತಿಯ ಬಲಾಢ್ಯರು ಸರಕಾರದ ಮೇಲೆ ಒತ್ತಡ ಹೇರಲಾರಂಭಿಸಿರುತ್ತಾರೆ. ಇನ್ನು ಕೆಲವೇ ದಿನಗಳಲ್ಲಿ ಮನೀಷಾ ಹತ್ತು ಜನರಲ್ಲೊಬ್ಬಳಾಗುತ್ತಾಳೆ.
ಊಳಿಗಮಾನ್ಯ ಧೋರಣೆ, ಮೇಲ್ಜಾತಿಯ ಪ್ರಾಬಲ್ಯ, ಬಲಪಂಥೀಯ ರಾಜಕಾರಣ, ಕೋಮು ದ್ವೇಷ, ಜಾತಿ ಶ್ರೇಷ್ಠತೆಯ ವ್ಯಸನ ಈ ಎಲ್ಲ ಅನಿಷ್ಟಗಳನ್ನೂ ವ್ಯವಸ್ಥಿತವಾಗಿ ಒಡಲಲ್ಲಿ ಕಾಪಿಟ್ಟುಕೊಂಡಿರುವ ಹಾಲಿ ಯೋಗಿ ರಾಜ್ಯದಲ್ಲಿ ಶೋಷಿತ ಸಮುದಾಯಗಳು ನಿರಂತರ ದೌರ್ಜನ್ಯ ಎದುರಿಸುತ್ತಲೇ ಇವೆ. ದಲಿತ ಸಮುದಾಯದ ಹೆಣ್ಣುಮಕ್ಕಳು ನಿರಂತರ ದೌರ್ಜನ್ಯ, ಅತ್ಯಾಚಾರಕ್ಕೊಳಗಾಗುತ್ತಲೇ ಇದ್ದಾರೆ. ನ್ಯಾಯಕ್ಕಾಗಿ ಹಂಬಲಿಸುತ್ತಲೇ ಇದ್ದಾರೆ. ನ್ಯಾಯ ಮರೀಚಿಕೆಯಾಗಿಯೇ ಇದೆ.
ಅಂತರ್ಜಾತಿ ವಿವಾಹ ಮೇಲ್ಜಾತಿಗಳ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತದೆ , ಗೌರವ-ಮರ್ಯಾದಾ ಹತ್ಯೆಗಳು ನಡೆಯುತ್ತವೆ. ಆದರೆ ಮಹಿಳೆಯ ಮೇಲಿನ ಅತ್ಯಾಚಾರ ಸದಾ ಅಂತರ್ಜಾತಿಯೇ ಆಗಿರುತ್ತದೆ. ದಲಿತ ಹೆಣ್ಣುಮಕ್ಕಳ ಸ್ಪರ್ಶವನ್ನೇ ಪಾಪ ಎಂದು ಭಾವಿಸುವ ಮೇಲ್ಜಾತಿ ಪುರುಷರಿಗೆ , ದಲಿತ ಹೆಣ್ಣಿನ ಮೇಲೆ ಅತ್ಯಾಚಾರವೆಸಗುವುದು ಮಲಿನ ಎನಿಸುವುದಿಲ್ಲ. ಏಕೆಂದರೆ ಇಲ್ಲಿ ಜಾತಿ ವಿಷದೊಡನೆ ಪುರುಷ ಬಲದ ವಿಕೃತ ರಾಕ್ಷಸೀ ಪ್ರವೃತ್ತಿ ಸೇರಿರುತ್ತದೆ.
ವಿವಾಹ ಮಾಡಿಕೊಳ್ಳುವ ದಲಿತ ಹೆಣ್ಣೂ ಹತ್ಯೆಗೀಡಾಗುತ್ತಾಳೆ. ಅತ್ಯಾಚಾರಕ್ಕೊಳಗಾದವರೂ ಹತ್ಯೆಗೀಡಾಗುತ್ತಾರೆ. ಎರಡೂ ಸಂದರ್ಭಗಳಲ್ಲಿ ಪ್ರಥಮ ಅಪರಾಧಿಯಾಗಿ ವ್ಯಕ್ತಿ ಪಾರಾಗುತ್ತಾನೆ. ಮೂಲ ಅಪರಾಧಿಯಾಗಿ ಈ ವ್ಯವಸ್ಥೆ ಜಾಣ ಮೌನಕ್ಕೆ ಜಾರುತ್ತದೆ. ದಲ್ಲಾಳಿಯಾಗಿ ಸರಕಾರ ಧನ ಪರಿಹಾರ ನೀಡಿ ಪಾಪಪ್ರಜ್ಞೆಯನ್ನು ಕಳೆದುಕೊಳ್ಳುತ್ತದೆ.ಇದು73 ವರ್ಷಗಳ ಸ್ವತಂತ್ರ ಭಾರತದಲ್ಲಿ ನಾವು ನೋಡುತ್ತಿರುವ ದುರಂತ.
ಇದು ಒಂದು ರಾಜ್ಯದ ಪ್ರಶ್ನೆಯಲ್ಲ. ಒಂದು ಸಮುದಾಯದ ಪ್ರಶ್ನೆಯೂ ಅಲ್ಲ. ಇದು ಈ ದೇಶದ ಮಹಿಳೆಯರ ಸಮಸ್ಯೆ, ಹೆಣ್ತನದ ಘನತೆಯ ಸಮಸ್ಯೆ. ದಲಿತ ಮಹಿಳೆಯರ ಸಂದರ್ಭದಲ್ಲಿ ಜಾತಿ ವಿಷ ಸೇರಿಕೊಳ್ಳುತ್ತದೆ. ಈ ಹೆಣ್ತನದ ಘನತೆಯನ್ನು ಗೌರವಿಸುವ ಕನಿಷ್ಟ ಸೌಜನ್ಯವನ್ನೂ ನಮ್ಮ ಸಮಾಜ, ರಾಜಕಾರಣ ಕಳೆದುಕೊಂಡಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ರಾಷ್ಟ್ರೀಯ ರಾಜಕೀಯ ಪಕ್ಷದ ಪ್ರಧಾನ ಕಾರ್ಯದರ್ಶಿ ಅನುಪಮ್ ಹಜ್ರಾ ” ನನಗೆ ಕೊರೋನಾ ಸೋಂಕು ತಗುಲಿದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಂಡು ಅವರಿಗೆ ಸೋಂಕು ತಗುಲಿಸುತ್ತಿದ್ದೆ ” ಎಂದು ಬಹಿರಂಗ ಹೇಳಿಕೆ ನೀಡುತ್ತಾರೆ.
” ಮುಸ್ಲಿಂ ಮಹಿಳೆಯರ ಶವಗಳನ್ನು ಗೋರಿಯಿಂದ ಹೊರತೆಗೆದು ಅತ್ಯಾಚಾರ ಮಾಡಬೇಕು ” ಎಂದು ಹೇಳಿದ ಮತಾಂಧನ ವಿಕೃತಿಯನ್ನು ನಗುನಗುತ್ತಾ ಆಸ್ವಾದಿಸಿದ ಬಿಜೆಪಿ ಸಂಸದ ಅಜಯ್ ಬಿಷ್ಟ್ ಈಗ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲು ಹಂಬಲಿಸುತ್ತಿದ್ದಾರೆ. ಭಾರತೀಯ ಸಂಸ್ಕೃತಿಯ ವಾರಸುದಾರರು ದಿವ್ಯ ಮೌನ ವಹಿಸುತ್ತಾರೆ. ಪಕ್ಷ ಈ ರೀತಿಯ ಹೇಳಿಕೆಗಳನ್ನು ಖಂಡಿಸುವುದಿರಲಿ ಗಮನಿಸುವುದೂ ಇಲ್ಲ. ವಾಜಪೇಯಿ ಬದುಕಿದ್ದರೆ ಕನಿಷ್ಡ ಪಕ್ಷ ” ಐಸಾ ನಹ್ಞೀ ಬೋಲ್ನಾ ಥಾ ಏ ಠೀಕ್ ನಹ್ಞೀ ಹೈ ” ಎಂದು ಮುದ್ದುಮುದ್ದಾಗಿ ಹೇಳುತ್ತಿದ್ದರೇನೋ. ಈ ಮನೋಭಾವವೇ ಅತ್ಯಾಚಾರಿಗಳನ್ನು ನಿತ್ಯಾಚಾರಿಗಳನ್ನಾಗಿ ಮಾಡುತ್ತದೆ. ಮನೀಷಾಳಂತಹ ದುರ್ಬಲರು ಇಂತಹ ವಿಕೃತಿಗಳಿಗೆ ಬಲಿಯಾಗುತ್ತಾರೆ.
ಈ ವಿಕೃತಿಯ ಮೂಲ ನಮ್ಮ ಸಾಮಾಜಿಕ ಸಂರಚನೆಯ ಚೌಕಟ್ಟಿನಲ್ಲೇ ಇದೆ. ನಮ್ಮ ಸಮಾಜೋ ಸಾಂಸ್ಕೃತಿಕ ಬದುಕಿನ ಗರ್ಭದಲ್ಲೇ ಇದೆ. ಬಾವರಿದೇವಿಯಿಂದ ಮನೀಷಾಳವರೆಗೆ, ಮಥುರಾದಿಂದ ಇತ್ತೀಚಿನ ಹತ್ಸಾರ್ ಗ್ರಾಮದವರೆಗೆ ಈ ಗರ್ಭದಿಂದ ಜನಿಸಿದ ರಕ್ಕಸ ಸಂತಾನಕ್ಕೆ ಸಾವಿರಾರು ಹೆಣ್ಣು ಮಕ್ಕಳು ಬಲಿಯಾಗಿದ್ದಾರೆ. ಪುರುಷ ಪ್ರಧಾನ ಧೋರಣೆ ಮತ್ತು ಪುರುಷಾಧಿಪತ್ಯದ ಮೌಲ್ಯಗಳನ್ನು ಸಾಮಾಜಿಕ ಬದುಕಿನಿಂದ ತೊಡೆದುಹಾಕುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆ ಯಾವುದೇ ಶೈಕ್ಷಣಿಕ ಕ್ರಮಗಳನ್ನು ಕೈಗೊಂಡಿಲ್ಲ .
ಏಕೆಂದರೆ ಈ ಮೌಲ್ಯಗಳೇ ಅಧಿಕಾರ-ಅಧಿಪತ್ಯ ರಾಜಕಾರಣದ ಬುನಾದಿಯಾಗಿದೆ. ಈ ರಾಜಕಾರಣದಲ್ಲಿ ಮಹಿಳೆಯರಿಗೆ ಸಮಾನ ಸ್ಥಾನಮಾನಗಳನ್ನು ನೀಡಲೂ ಈ ಮೌಲ್ಯಗಳೇ ಅಡ್ಡಿಯಾಗುತ್ತಿವೆ. ಹೆಣ್ತನದ ಘನತೆಯನ್ನು ರಕ್ಷಿಸುವ ಹಾದಿಯಲ್ಲೂ ಈ ಮೌಲ್ಯಗಳೇ ತಡೆಗೋಡೆಗಳಾಗುತ್ತವೆ.
ಇದು ತಾತ್ವಿಕವಾಗಿ ಗಂಡು ಹೆಣ್ಣಿನ ಪ್ರಶ್ನೆಯಾದರೂ, ಮೂಲತಃ ಪುರುಷಾಧಿಪತ್ಯ ಮತ್ತು ಹೆಣ್ತನದ ನಡುವಿನ ಸಂಘರ್ಷವಾಗಿದೆ. ಹೆಣ್ತನ ಮತ್ತು ಹೆಣ್ತನದ ಗೌರವ ಸತತ ದಾಳಿಗೊಳಗಾಗುತ್ತಿದೆ. ಮೌಖಿಕ ಅತ್ಯಾಚಾರದಲ್ಲಿ ನಿಷ್ಣಾತರಾಗಿರುವ ರಾಜಕೀಯ ನಾಯಕರುಗಳ ಬೃಹತ್ ದಂಡು ನಮ್ಮ ಶಾಸನ ಸಭೆಗಳಲ್ಲಿದ್ದಾರೆ. ಇಂತಹ ವಿಕೃತ ಪಿಶಾಚಿಗಳನ್ನು ಬೆಂಬಲಿಸುವ ಮಹಿಳಾ ಸಮೂಹವೂ ನಮ್ಮ ನಡುವೆ ಇದೆ.
ಜಾತಿ ಅಸ್ಮಿತೆ, ಮತಧರ್ಮ ಶ್ರೇಷ್ಠತೆ, ಅಂತಸ್ತಿನ ಅಹಮಿಕೆ ಮತ್ತು ಸಾಂಸ್ಕೃತಿ ರಾಜಕಾರಣದ ಸನ್ನಿ ಭಾರತದ ಸುಶಿಕ್ಷಿತ, “ನಾಗರಿಕ” ಮತ್ತು “ಪ್ರಜ್ಞಾವಂತ” ಪ್ರಜೆಗಳನ್ನೂ ನಿರ್ಲಜ್ಜರನ್ನಾಗಿ ಮಾಡುತ್ತಿದೆ. ಹಾಗಾಗಿಯೇ ಮನೀಷಾ ಅನಾಥಳಂತೆ ಕಾಣುತ್ತಾಳೆ. ಮನೀಷಾಗೆ ಹಿಂದೂ ಹಣೆಪಟ್ಟಿ ಇಲ್ಲ ಅತ್ಯಾಚಾರಿಗಳಿಗೆ ಮುಸ್ಲಿಂ ಹಣೆಪಟ್ಟಿ ಇಲ್ಲ. ಹಾಗಾಗಿ ಸಾಂಸ್ಕೃತಿಕ ಆರಕ್ಷಕರು ನಿರಾಳವಾಗಿರುತ್ತಾರೆ. ಒಂದು ವೇಳೆ ಅತ್ಯಾಚಾರಿಗಳಲ್ಲಿ ರಾಮ್, ಲವ್ ಕುಶ್ ಬದಲು ಅಬ್ಬಾಸ್, ಹುಸೇನ್ ಇದ್ದಿದ್ದರೆ ವಿಷಯ ಸಂಸತ್ತಿನಲ್ಲಿ ಮೊಳಗುತ್ತಿತ್ತು ಇದು ಕಳೆದ ಮೂರು ದಶಕಗಳಲ್ಲಿ ಭಾರತ ಕಂಡುಕೊಂಡಿರುವ ” ಶವ ರಾಜಕಾರಣ “ದ ಪ್ರತಿಫಲ.
ತಮ್ಮ ಮೇಲೆ ನಡೆದ ದೌರ್ಜನ್ಯ, ಆಕ್ರಮಣ, ದಬ್ಬಾಳಿಕೆ ಮತ್ತು ಅತ್ಯಾಚಾರಗಳಿಗೆ ತಾವೇ ಸಾಕ್ಷ್ಯಾಧಾರಗಳನ್ನು ಒದಗಿಸಿ ನ್ಯಾಯ ಪಡೆಯಬೇಕಾದ ಪರಿಸ್ಥಿತಿಯಲ್ಲಿ ಈ ದೇಶದ ಶೇ ೫೦ ರಷ್ಟಿರುವ ಜನಸಮುದಾಯಗಳು ಬದುಕುತ್ತಿವೆ. ಮಹಿಳೆಯರು, ದಲಿತ ಮತ್ತು ಅಲ್ಪಸಂಖ್ಯಾತರು ಇದರ ಒಂದು ಭಾಗವಾಗಿದ್ದಾರೆ. ಮನೀಷಾ ಇಂತಹ ನತದೃಷ್ಟ ಸಂತ್ರಸ್ತರನ್ನು ಪ್ರತಿನಿಧಿಸುವ ಅಸಹಾಯಕ ಮಹಿಳೆಯಾಗಿದ್ದಾಳೆ.
ಈ ಪರಿಸ್ಥಿತಿಗೆ ಯಾರು ಕಾರಣ ? ಸಮಾಜ, ಸಂಸ್ಕೃತಿ, ರಾಜಕಾರಣ, ಪ್ರಭುತ್ವ, ನ್ಯಾಯಾಂಗ, ಸರಕಾರಗಳು, ಪುರುಷ ಸಮಾಜ , ಶಿಕ್ಷಣ ವ್ಯವಸ್ಥೆ ಓಹ್ ಯಾರತ್ತ ಬೆಟ್ಟು ತೋರುವುದು ? ಇದು ನಮ್ಮೆಲ್ಲರನ್ನೂ, ಅಂದರೆ ವಿವೇಕ, ಸೌಜನ್ಯ, ಸಂವೇದನೆ, ಸಭ್ಯತೆ, ಮನುಜ ಪ್ರಜ್ಞೆ, ಮಾನವೀಯತೆ ಇರುವ, ಎಲ್ಲರನ್ನೂ ಕಾಡಬೇಕಿರುವ ಪ್ರಶ್ನೆ. ಇದಾವುದೂ ಇಲ್ಲದವರು ಅಧಿಕಾರ ಪೀಠಗಳಲ್ಲಿರುವುದೇಕೆ ಎನ್ನುವುದು ಮತ್ತೊಂದು ಜಟಿಲ ಪ್ರಶ್ನೆ. ಮನೀಷಾ ಕೇಳ್ತಿದಾಳೆ. ಉತ್ತರ ಕೊಡಿ…..
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
-
ದಿನದ ಸುದ್ದಿ3 days agoತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್
-
ದಿನದ ಸುದ್ದಿ3 days agoಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
-
ದಿನದ ಸುದ್ದಿ2 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ



