Connect with us

ದಿನದ ಸುದ್ದಿ

ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ

Published

on

  • ಶಂಕರ ದೇವರು ಹಿರೇಮಠ, ಸಾಹಿತಿಗಳು

ಮಸ್ಕಿ ಭಾರತ ದೇಶ ಕೃಷಿ ಪ್ರಧಾನವಾದ ದೇಶ.ಇಲ್ಲಿ ಹಲವಾರು ಭಾಷೆ, ಹಲವಾರು ಸಂಸ್ಕೃತಿ ಹಾಗೂ ಹಲವಾರು ರಾಜ್ಯಗಳನ್ನು ಒಳಗೊಂಡ ಭಾರತ. ತನ್ನೊಳಗೆ ವಿಭಿನ್ನ ಸಂಸ್ಕೃತಿಯನ್ನು ಐತಿಹಾಸಿಕ ಹಿನ್ನೆಲೆಯನ್ನು ಒಳಗೊಂಡಿದೆ. ಇಲ್ಲಿ ಆಚರಿಸುವ ಬಹುತೇಕ ಹಬ್ಬಗಳು ಹಳ್ಳಿಯ ಸೊಗಡಿನೊಂದಿಗೆ ಸಮ್ಮಿಲಿತಗೊಂಡಿವೆ. ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಬಹುತೇಕ ಹಬ್ಬಗಳ ಹಿನ್ನೆಲೆಯನ್ನು ಒಳಗೊಂಡಿವೆ .

ಮಳೆಗಾಲದಲ್ಲಿ ಬರುವ ವಿಶೇಷ ಹಬ್ಬವೇ ಮಣ್ಣೆತ್ತಿನ ಅಮಾವಾಸ್ಯೆ. ಮಳೆಗಾಲದ ಪ್ರಾರಂಭದ ದಿನಗಳಲ್ಲಿ ಬರುವ ಈ ಹಬ್ಬ ಉತ್ತರ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡುತ್ತದೆ .ಮುಂಗಾರು ಪ್ರಾರಂಭವಾಗಿ ರೈತರು ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಿ ಹೊಲಗಳನ್ನು ಹಸನು ಮಾಡಿ ಬಿತ್ತನೆ ಹಾಗೂ ನಾಟಿಯನ್ನು ಮಾಡಿರುತ್ತಾರೆ. ಹೊಲಗಳು ಹಸಿರಿನಿಂದ ಕಂಗೊಳಿಸುತ್ತಿರುತ್ತವೆ ಇಂತಹ ದಿನಗಳಲ್ಲಿ ರೈತರು ವಿಶ್ರಾಂತಿಯನ್ನು ಪಡೆಯುವ ಜೊತೆಗೆ ತಮ್ಮ ಒಡನಾಡಿಯಾದ ಜಾನುವಾರುಗಳನ್ನು, ಎತ್ತುಗಳನ್ನು ಪ್ರೀತಿಯಿಂದ ಪೋಷಿಸುತ್ತಾರೆ .ಕಾರ ಹುಣ್ಣಿಮೆಯ ನಂತರ ಬರುವ ಮಣ್ಣೆತ್ತಿನ ಅಮವಾಸೆ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಬಹು ಸಂಭ್ರಮದ ಹಬ್ಬ .

ರೈತರ ಒಡನಾಡಿ ಹಾಗೂ ರೈತರ ಉಸಿರೆಂದರೆ ಎತ್ತುಗಳು ಎತ್ತುಗಳೊಂದಿಗೆ ರೈತರು ಅವಿನಾಭಾವ ಸಂಬಂಧವನ್ನು ಹೊಂದಿರುತ್ತಾರೆ .ಎತ್ತುಗಳನ್ನು ಕೇವಲ ಪ್ರಾಣಿಗಳೆಂದು ಪರಿಗಣಿಸದೆ ತಮ್ಮ ಮನೆಯ ಸದಸ್ಯರಂದೇ ಪರಿಗಣಿಸಿ ಅವುಗಳನ್ನು ಪ್ರೀತಿಯಿಂದ ಅಕ್ಕರೆಯಿಂದ ಸಾಕುತ್ತಿರುತ್ತಾರೆ. ರಾಮ, ಲಕ್ಷ್ಮಣ ಭೀಮ, ಕರಿಯ, ಚೆನ್ನ,ಬಸವ, ಕೆಂಪ ಹಾಗೂ ತಮ್ಮ ನೆಚ್ಚಿನ ನಾಯಕ ನಟರ ಹೆಸರನ್ನು ತಮ್ಮ ಪ್ರೀತಿಯ ಎತ್ತುಗಳಿಗೆ ಇಟ್ಟು ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಾರೆ. ರೈತರ ಕಷ್ಟ ,ಸುಖಗಳಲ್ಲಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಎತ್ತುಗಳಿಗೆ ರೈತರು ಅಪಾರ ಗೌರವವನ್ನು ನೀಡುತ್ತಾರೆ.

ಶಂಕರ ದೇವರು ಹಿರೇಮಠ, ಸಾಹಿತಿಗಳು

ಮಣ್ಣೆತ್ತಿನ ಅಮಾವಾಸ್ಯೆ ದಿನದ ಮೊದಲೇ ಹಳ್ಳ, ಹೊಳೆ, ಗದ್ದೆಗಳಿಂದ ಮಣ್ಣನ್ನು ತಂದು ಜೋಡಿ ಎತ್ತುಗಳನ್ನು ಮಾಡಿ ಎತ್ತುಗಳಿಗೆ ಮೇವು ಹಾಕುವ ಒಂದು ಗೋದಲಿಯನ್ನು ಮಾಡುತ್ತಾರೆ. ಎತ್ತುಗಳನ್ನು ಮಣ್ಣಿನಿಂದಲೇ ಮಾಡಿ ಅವುಗಳನ್ನು ದೇವರ ಮನೆಯ ಜಗಲಿ ಮೇಲಿಟ್ಟು ಪೂಜೆ ಮಾಡುತ್ತಾರೆ. ಇನ್ನೂ ಕೆಲವರು ಹೊಲಗಳಿಗೆ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಮಾಡುತ್ತಾರೆ .

ರೈತ ಹಾಗೂ ಎತ್ತುಗಳಿಗೆ ಅವಿನಾಭಾವ ಸಂಬಂಧ ಶತಶತಮಾನಗಳಿಂದ ಇದೆ. ಭಾರತದ ಪ್ರತಿಯೊಂದು ಕೃಷಿ ಕುಟುಂಬವು ಕೃಷಿಯೊಂದಿಗೆ ಹಾಗೂ ಮಣ್ಣಿನೊಂದಿಗೆ ಅವಿನಾಭಾವ ಸಂಬಂಧದ ನಂಟಿದೆ .ಮಳೆಗಾಲದಲ್ಲಿ ಬಿತ್ತನೆಯಾಗಿ ಬೆಳೆ ಬೆಳೆದು ಹಸಿರಿನಿಂದ ಭೂಮಿ ಕಂಗೊಳಿಸುತ್ತಿರುವ ಈ ದಿನಗಳಲ್ಲಿ ಕೃಷಿಯಲ್ಲಿ ಭಾಗಿಯಾಗುವ ಎತ್ತುಗಳಿಗೆ ಗೌರವಿಸುವ ಮೂಲಕ ಈ ದಿನಗಳಲ್ಲಿ ಶ್ರಮ ಶ್ರಮ ಸಂಸ್ಕೃತಿಯನ್ನು ಗೌರವಿಸುವ ಕಾರ್ಯ ಶತಮಾನಗಳಿಂದ ನಡೆದುಕೊಂಡು ಬಂದಿದೆ .

ಹಳ್ಳಿಗಳಲ್ಲಿ ಕುಂಬಾರರು ತಯಾರಿಸಿದ ಸುಂದರವಾದ ಎತ್ತುಗಳನ್ನು ಕೊಂಡು ತಂದು ಅವುಗಳಿಗೆ ಪೂಜೆ ಸಲ್ಲಿಸಿ ಸಂಭ್ರಮಿಸಿ ಸಂತೋಷಪಡುವರು. ರೈತರು ಹಿಂದೆ ಎತ್ತುಗಳನ್ನು ಕೊಟ್ಟು ಅದರ ಬದಲಾಗಿ ದವಸ ಧಾನ್ಯಗಳನ್ನು ಪಡೆಯುತ್ತಿದ್ದರು. ಇಂದು ನಗರೀಕರಣದ ಪರಿಣಾಮ ಎತ್ತುಗಳು ಮಾರಾಟದ ಸರಕಾಗಿ ಪರಿಣಮಿಸಿವೆ. ಆದರೂ ಇನ್ನೂ ಹಳ್ಳಿಗಳಲ್ಲಿ ಎತ್ತುಗಳನ್ನು ಪೂಜ್ಯನೀಯ ಸ್ಥಾನದಲ್ಲಿ ಇಟ್ಟು ಗೌರವಿಸುತ್ತಾರೆ. ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಮಕ್ಕಳಿಗೆ ಸಂಭ್ರಮದ ಹಬ್ಬ. ಹಬ್ಬದ ಮರುದಿನ ಮಕ್ಕಳು ಮನೆ ಮನೆಗೆ ತೆರಳಿ ಕುಂಟೆತ್ತು ಬಂದಿದೆ ಅಂತ ಹೇಳಿ ಅಕ್ಕಿ, ಜೋಳ, ಕಾಳು, ಬೆಲ್ಲ ತಂದು ಅವುಗಳಿಂದ ಸಿಹಿ ಅಡಿಗೆ ಮಾಡಿಕೊಂಡು ಎಲ್ಲ ಮಕ್ಕಳು ಊಟ ಮಾಡಿ ಎತ್ತುಗಳಿಗೆ ಮತ್ತೊಮ್ಮೆ ಪೂಜೆ ಸಲ್ಲಿಸಿ ಅವುಗಳನ್ನು ವಿಸರ್ಜಿಸುವ ಪದ್ಧತಿ ರೂಢಿ ಇದೆ. ಮಕ್ಕಳೆಲ್ಲ ಸಂಭ್ರಮದಿಂದ ಈ ಕಾರ್ಯದಲ್ಲಿ ಭಾಗವಹಿಸಿ ಮಣ್ಣೆತ್ತಿನ ಅಮಾವಾಸ್ಯೆ ಯನ್ನು ಜೀವಂತವಾಗಿಸುವ ಕಾರ್ಯವನ್ನು ಈಗಲೂ ಮಾಡುತ್ತಿದ್ದಾರೆ .

ಈಗೀಗ ಕೃಷಿ ಚಟುವಟಿಕೆಗಳಿಗೆ ಹೆಚ್ಚಾಗಿ ಯಂತ್ರಗಳನ್ನು ಹಾಗೂ ಟ್ರ್ಯಾಕ್ಟರ್ ಗಳನ್ನು ಬಳಸುತ್ತಿರುವ ಕಾರಣದಿಂದ ಎತ್ತುಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ರೈತರ ಒಡನಾಡಿಯಾದ ಎತ್ತುಗಳು ಇಂದು ಪ್ರತಿಷ್ಠೆಯ ಪ್ರತೀಕವಾಗಿ ಇನ್ನೂ ಕುಟುಂಬದ ಕೆಲವರು ಲಕ್ಷ ಲಕ್ಷ ಹಣ ಕೊಟ್ಟು ಖರೀದಿಸಿ ಮನೆಗೆ ತಂದು ಎತ್ತುಗಳನ್ನು ಸಾಕುತ್ತಿದ್ದಾರೆ. ಎತ್ತುಗಳು ನಮ್ಮ ಅನ್ನದಾತರ ಗೌರವ ಪ್ರತೀಕ .ನಾವೆಲ್ಲರೂ ಕುಳಿತು ಊಟ ಮಾಡುವ ಪ್ರತಿಯೊಂದು ಅನ್ನದ ಅಗಳಿನ ಹಿಂದೆ ಕೋಟಿಗಟ್ಟಲೆ ರೈತರ ಶ್ರಮ ಇದೆ .ಆ ಶ್ರಮದ ಹಿಂದೆ ಎತ್ತುಗಳ ಒಡೆಯನಾದ ರೈತನ ಮೇಲಿನ ಪ್ರೀತಿ ಇದೆ .(ಬರಹ-ಶಂಕರ ದೇವರು ಹಿರೇಮಠ, ಸಾಹಿತಿಗಳು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending